ದಿನದ ಸುದ್ದಿ
ದಾವಣಗೆರೆ | ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದರೆ ನಿರ್ದಾಕ್ಷಿಣ್ಯ ಕ್ರಮ : ಸಚಿವ ಭೈರತಿ ಬಸವರಾಜ್ ಸೂಚನೆ
ಸುದ್ದಿದಿನ,ದಾವಣಗೆರೆ:ಯಾವುದೇ ರೋಗಿಗಳು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಹೋದಾಗ ನಿರಾಕರಣೆ ಮಾಡಿದರೆ ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಹೇಳಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇವರ ನೇತೃತ್ವದ ಸರ್ಕಾರ ರಚನೆಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆ ಕುರಿತು ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ “ಜನಸ್ನೇಹಿ ಆಡಳಿತ ಒಂದು ವರ್ಷ; ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ” ನೇರ ಪ್ರಸಾರದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸರ್ಕಾರದ ಸಾಧನೆಯ ಕಿರುಹೊತ್ತಿಗೆ ಬಿಡುಗಡೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ 5 ಸಮಿತಿ ತಂಡ ರಚನೆ ಮಾಡಲಾಗುವುದು. ಈ ತಂಡಗಳು ಮೂರು ಸರದಿಯಲ್ಲಿ ಕೆಲಸ ಮಾಡುವುದರ ಜೊತೆಗೆ ಪ್ರತಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳು ವಾಪಾಸ್ಸು ಹೋಗದಂತೆ ಕಾರ್ಯ ನಿರ್ವಹಿಸುವರು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸಕ್ರಿಯವಾಗಿರುವ ಕೋವಿಡ್ ರೋಗಿಗಳು ಆರೋಗ್ಯವಾಗಿದ್ದಾರೆ. ಯಾವುದೇ ಸಮಸ್ಯೆ ಇಲ್ಲ. ಅವರಿಗೆ ಅಗತ್ಯ ವೈದ್ಯಕೀಯ ಸೌಲಭ್ಯ, ಚಿಕಿತ್ಸೆ ಒದಗಿಸುವ ಮೂಲಕ ಗುಣಮುಖರನ್ನಾಗಿಸಲಾಗುವುದು. ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಇನ್ನಷ್ಟು ಸಮರ್ಪಕ ಕೆಲಸ ನಿರ್ವಹಿಸಬೇಕಿದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕರಾದ ರವೀಂದ್ರನಾಥ್, ಎಸ್.ವಿ.ರಾಮಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದೀಪಾ ಜಗದೀಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ ಸಿಇಓ ಪದ್ಮಾ ಬಸವಂತಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮತ್ತಿತರ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243