ದಿನದ ಸುದ್ದಿ
ಕೊರೋನಾ ಸಂದರ್ಭದಲ್ಲಿ ಸೇವಾದಳ ಶಿಕ್ಷಕರ ಸೇವೆ ಶ್ಲಾಘನೀಯ : ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ ಸಿದ್ದಪ್ಪ
ಸುದ್ದಿದಿನ,ದಾವಣಗೆರೆ : ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಸೇವಾದಳ ಶಿಕ್ಷಕರ ಸೇವೆ ಶ್ಲಾಘನೀಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ.ಸಿ.ಸಿದ್ದಪ್ಪ ಹೇಳಿದರು. ಇಂದು ಹರಿಹರ ತಾಲ್ಲೂಕು ದೇವರಬೆಳಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಭಾರತ ಸೇವಾದಳದ ತಾಲ್ಲೂಕು ಮಟ್ಟದ ಶಿಕ್ಷಕರ ಕಾರ್ಯಾಗಾರ ಮತ್ತು ಕೊರೊನಾ ಜಾಗೃತಿ ಶಿಬಿರವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಲಾಕ್ ಡೌನ್ ಸಂದರ್ಭದಲ್ಲಿ ನಾನು ನೋಡಲ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದು ನನ್ನ ತಂಡದಲ್ಲಿ ಸೇವಾದಳ ಶಿಕ್ಷಕರು ಸೇವೆ ಸಲ್ಲಿಸಿದ್ದಾರೆ. ಪ್ರಮುಖ ರಸ್ತೆಗಳನ್ನು ಬಂದ್ ಮಾಡಿ ಸಾರ್ವಜನಿಕರು ಒಂದು ಊರಿನಿಂದ ಮತ್ತೊಂದು ಊರಿಗೆ ಹೋಗದಂತೆ ಶಿಸ್ತಿನಿಂದ ಕೊರೋನಾ ನಿಯಮವನ್ನು ಪಾಲಿಸಲಾಯಿತು.
ಸೇವೆ ಸಲ್ಲಿಸುವಾಗ ಬಿಸಿಲು, ಹಸಿವು, ಬಾಯಾರಿಕೆಯ ಜೊತೆಗೆ ಕೋರನಾ ಭಯ ನಮಗೂ ಆವರಿಸಿ ನಮ್ಮ ಕುಟುಂಬದವರನ್ನು ಸಹ ಸಂಪೂರ್ಣವಾಗಿ ಆವರಿಸಿತ್ತು. ಕರ್ತವ್ಯ ಮುಗಿಸಿ ಮನೆಗೆ ಹೋದಾಗಲೂ ಕೂಡ ಮನೆಯವರ ಜೊತೆಗೆ ಬೆರೆಯುವುದು ತುಂಬಾ ಕಷ್ಟವಾಗಿತ್ತು. ಜಿಲ್ಲಾಡಳಿತ, ಪೋಲೀಸ್ ಇಲಾಖೆ, ಆರೋಗ್ಯ ಇಲಾಖೆಯ ಜೊತೆಗೆ ಶಿಕ್ಷಣ ಇಲಾಖೆ ಸೇರಿ ಕೊರೋನಾ ಸಂದರ್ಭದಲ್ಲಿ ಸಲ್ಲಿಸಿದ ಸೇವೆ ಶ್ಲಾಘನೀಯವಾಗಿದೆ. ನಮ್ಮ ಶಿಕ್ಷಣ ಇಲಾಖೆಯಲ್ಲಿ ಕೂಡ ಹಲವಾರು ಜನರು ಕೊರೋನಾದಿಂದ ಮೃತಪಟ್ಟರು.
ಸೇವಾದಳ ಸಂಘಟಕರಾದ ಎಂ.ಅಣ್ಣಯ್ಯ, ಕೆ.ಟಿ. ಜಯಪ್ಪ, ಟಿ.ಎಸ್. ಕುಮಾರಸ್ವಾಮಿ, ಗೋಪಾಲಪ್ಪ, ಹನುಮಂತಪ್ಪ ಇವರ ಸೇವೆಯನ್ನು ಸ್ಮರಿಸಬೇಕಾಗಿದೆ ಎಂದರು.
ವೈದ್ಯಾಧಿಕಾರಿಗಳಾದ ಡಾ.ರಮೇಶ್ ರವರು ಮಾತನಾಡಿ ಕೋರೋನ ಹೇಗೆ ಮಾನವನ ದೇಹವನ್ನು ಪ್ರವೇಶ ಮಾಡುತ್ತದೆ ಅದು ಬಂದನಂತರ ಹೇಗೆ ಮಾನವನಲ್ಲಿ ಬದಲಾವಣೆಯಾಗುತ್ತದೆ ಎಂಬುದನ್ನು ತಿಳಿಸಿದರು.
ಕೊರೋನ ಹರಡದಂತೆ ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ಉಪಯೋಗಿಸಬೇಕು, ಬಿಸಿ ನೀರು ಕುಡಿಯಬೇಕು, ಬಿಸಿ ಆಹಾರವನ್ನು ಸೇವಿಸಬೇಕು, ಯೋಗ ಪ್ರಾಣಾಯಾಮವನ್ನು ಮಾಡಬೇಕು, ಹಸಿರು ಸೊಪ್ಪು, ತರಕಾರಿಯನ್ನು ಉಪಯೋಗಿಸಬೇಕು ಇದರ ಜೊತೆಗೆ ಸಾಮಾಜಿಕ ಅಂತರವನ್ನು ಯಾವಾಗಲೂ ಕಾಯ್ದುಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಪಿ.ಠಾಕೂರ್ ರವರು ಮಾಸ್ಕ್ ಸ್ಯಾನಿಟೈಸರ್ ವಿತರಣೆ ಮಾಡಿ ಶಾಲೆಗಳಲ್ಲಿ ಸೇವಾದಳ ಚಟುವಟಿಕೆ ಇನ್ನುಮುಂದೆ ಆರಂಭಿಸುವಂತೆ ಶಿಕ್ಷಕರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಸೇವಾದಳದ ಹಿರಿಯ ಕಾರ್ಯಕರ್ತ ದಿವಂಗತ ಎಸ್. ಆರ್.ಮಠ ಇವರ ಧರ್ಮಪತ್ನಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಶ್ರೀಮತಿ ಲತಾ ಎಸ್ಡಿಎಂಸಿ ಅಧ್ಯಕ್ಷರು, ಎಂ ಅಣ್ಣಯ್ಯ ವಲಯ ಸಂಘಟಕರು, ಟಿ.ಎಸ್. ಕುಮಾರಸ್ವಾಮಿ ದೈಹಿಕ ಶಿಕ್ಷಕರು, ಮಂಜುಳ ದೈಹಿಕ ಶಿಕ್ಷಣಾಧಿಕಾರಿ, ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳಿಂದ ಬಂದ ಶಿಕ್ಷಕರು, ಗ್ರಾಮಪಂಚಾಯತಿಯ ಸದಸ್ಯರು, ಎಸ್ಡಿಎಂಸಿ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


