ದಿನದ ಸುದ್ದಿ

ದಾವಣಗೆರೆ | ಅನ್ನಭಾಗ್ಯ ಯೋಜನೆಯಡಿ ಪೋಷಕಾಂಶ ಭರಿತ ಸಾರವರ್ದಿತ ಅಕ್ಕಿ ವಿತರಣೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದಾಗಿ, ಅನೀಮಿಯಾ, ಇರುಳು ಕುರುಡುತನದಂತಹ ರೋಗಗಳು ಬರಬಹುದಾಗಿದೆ. ಅಲ್ಲದೇ ಹೆಚ್ಚಾಗಿ ಮಹಿಳೆಯರು ಹಾಗೂ ಮಕ್ಕಳು ಅಪೌಷ್ಟಿಕತೆಗೆ ಬಲಿಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು,. ಇದನ್ನು ತಪ್ಪಿಸಲು ಹೆಚ್ಚಿನ ಪೋಷಕಾಂಶದ ಅಗತ್ಯತೆ ಇದೆ.

ಈ ನಿಟ್ಟಿನಲ್ಲಿ ಜನಸಾಮಾನ್ಯರಲ್ಲಿನ ಅಪೌಷ್ಠಿಕತೆ ಹೋಗಲಾಡಿಸಿ ಆರೋಗ್ಯ ವೃದ್ಧಿಸುವ ಉದ್ದೇಶದಿಂದ ಸಾರ್ವಜನಿಕ ವಿತರಣಾ ಪದ್ಧತಿಯ ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡಲಾಗುವ ಪ್ರತಿ 50 ಕೆ.ಜಿ ಅಕ್ಕಿಯ ಚೀಲದಲ್ಲಿ ಅರ್ಧ ಕೆ.ಜಿ.ಯಷ್ಟು ಪೋಷಕಾಂಶ (ವಿಟಾಮಿನ್ ‘ಎ’ ಮತ್ತು ‘ಡಿ’ ಐರನ್, ಫೋಲಿಕ್ ಆಸಿಡ್, ಬಿಕಾಂಪ್ಲೆಕ್ಸ್, ಜಿಂಕ್ ಹಾಗೂ ಐಯೋಡಿನ್) ಭರಿತ ಸಾರವರ್ದಿತ ಅಕ್ಕಿಯಲ್ಲಿ ಬೇರೆಸಿ ಮೇ-2022ರ ಮಾಹೆಯಿಂದ ನ್ಯಾಯಬೆಲೆ ಅಂಗಡಿಯಲ್ಲಿ ವಿತರಣೆ ಮಾಡಲಾಗುತ್ತಿದೆ.

ಸಾರವರ್ದಿತಗೊಳಿಸಿರುವ (ಪೋರ್ಟಿಫೈಡ್) ಅಕ್ಕಿಯಲ್ಲಿ ಕೆಲವೊಂದು ಅಕ್ಕಿಯ ಕಾಳುಗಳು ಹೊಳಪಿನಿಂದ ನೀಡಲು ಪ್ಲಾಸ್ಟಿಕ್ ರೀತಿಯಲ್ಲಿ ಕಾಣಿಸುತ್ತಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗದೇ ವಿತರಣೆ ಮಾಡಲಾಗುತ್ತಿರುವ ಸಾರವರ್ಧಿತ ಅಕ್ಕಿಯನ್ನು ಉಪಯೋಗಿಸಿ ಆರೋಗ್ಯವಂತರಾಗಲು ಸೂಚಿಸಿದೆ.

ಸಾರ್ವಜನಿಕ ವಿತರಣಾ ಪದ್ಧತಿಯಡಿ ಬಿಡುಗಡೆ ಮಾಡುವ ಅಕ್ಕಿಯನ್ನು ಸ್ವಂತಕ್ಕೆ ಉಪಯೋಗಿಸತಕ್ಕದ್ದು, ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹ ಕುಟುಂಬಕ್ಕೆ ನೀಡಿದ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಪಡಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version