ದಿನದ ಸುದ್ದಿ
ದಾವಣಗೆರೆ | ಗ್ರಾಮಗಳಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು ; ಜನತೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದಿರುವುದೇ ಕಾರಣ | ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ: ಕೊರೊನಾ ಸೋಂಕು ತಡೆಗಟ್ಟಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ. ಈಗಾಗಲೇ ಸೋಂಕು ನಿವಾರಣೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಸರ್ಕಾರದ ಆದೇಶದ ಮೆರೆಗೆ ಮೇ.31 ರವರೆಗೆ ಸಂಪೂರ್ಣ ಲಾಕ್‍ಡೌನ್ ವಿಸ್ತರಣೆ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.
ಸೋಮವಾರ ಜಗಳೂರಿನ ತರಳಬಾಳು ಸಮುದಾಯದ ಭವನದಲ್ಲಿ ಹಮ್ಮಿಕೊಂಡಿದ್ದ ಕೋವಿಡ್-19 2ನೇ ಅಲೆಯ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿ ಮಾತನಾಡಿದ ಅವರು, ಮೇ.23 ರಂದು ಜಗಳೂರು ತಾಲ್ಲೂಕಿನಲ್ಲಿ ಒಟ್ಟು 852 ಪಾಸಿಟಿವ್ ಪ್ರಕರಣಗಳಿದ್ದು, 390 ಜನರು ಗುಣಮುಖರಾಗಿದ್ದಾರೆ.
167 ಜನರು ಹೋಮ್ ಐಸೋಲೇಷನ್ ಅಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಒಟ್ಟು 462 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಡಿ.ಸಿ.ಹೆಚ್.ಸಿ ಯಲ್ಲಿ 37 ಜನ, ಮೆದಗಿನಕೆರೆ ಕೋವಿಡ್ ಕೇರ್ ಸೆಂಟರ್‍ನಲ್ಲಿ 85 ಜನ, ಜಗಳೂರು ಟೌನ್ (ಲಿಂಗನಹಳ್ಳಿ ರಸ್ತೆ) ಕೋವಿಡ್ ಕೇರ್ ಸೆಂಟರ್‍ನಲ್ಲಿ 9 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೂ ಒಟ್ಟು 9 ಜನ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.
ಕೋವಿಡ್-19 2ನೇ ಅಲೆಯಲ್ಲಿ ಹೆಚ್ಚಾಗಿ ಗ್ರಾಮಾಂತರ ಭಾಗಗಳಲ್ಲೇ ಸೋಂಕು ಹೆಚ್ಚಾಗಿ ಹರಡುತ್ತಿರುವುದಕ್ಕೆ ಕಾರಣವೆಂದರೆ ಗ್ರಾಮದ ಜನರು ನಿಯಮಗಳನ್ನು ಮೀರಿ ಸಭೆ, ಸಮಾರಂಭ, ಮದುವೆ, ಜಾತ್ರೆಗಳು ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಜಲ್ಲಿಕಟ್ಟೆ, ದೇವಸ್ಥಾನದ ಆವರಣಗಳಲ್ಲಿ ಗುಂಪುಗಟ್ಟಿ ಸೇರುವುದಲ್ಲದೇ, ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಿಬಿಟ್ಟಿದ್ದಾರೆ.
ಗ್ರಾಮಗಳಲ್ಲಿ ಬಹುತೇಕರು ಮಾಸ್ಕ್ ಧರಿಸುವುದೇ ಇಲ್ಲ. ಧರಿಸಿದರು ಬೇಕಾಬಿಟ್ಟಿ ಹಾಕಿಕೊಳ್ಳುತ್ತಾರೆ.
ಬೆಂಗಳೂರಿನಿಂದ ಬರುವವರು ಅಗತ್ಯ ಮಾಹಿತಿಗಳನ್ನು ಕೊಡದೇ ಮನೆ ಸೇರುತ್ತಾರೆ. ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದರೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳದೇ ಸ್ಥಳೀಯ ವೈದ್ಯರ ಬಳಿಯೋ ಅಥವಾ ಮೆಡಿಕಲ್ ಶಾಪ್‍ಗಳಲ್ಲೋ ಬೇಕಾದ ಮಾತ್ರೆಗಳನ್ನು ತೆಗೆದುಕೊಂಡು ನುಂಗುತ್ತಾರೆ.
ಇದನ್ನೂ ಓದಿ | ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ : ಎಸ್ಪಿ ಅರ್ಜುನ್ ಅಮಾನತು ; ಸಿಐಡಿ ತನಿಖೆಗೆ ಆದೇಶ
ಸೋಂಕಿನ ಪ್ರಮಾಣ ಹೆಚ್ಚಾಗಿ ಆಕ್ಸಿಜನ್ ಸ್ಯಾಚುರೇಷನ್ ಲೆವೆಲ್ 50-70 ಕ್ಕೆ ಬಂದಾಗ ಬೆಡ್ ಬೇಕು, ವೆಂಟಿಲೇಟರ್ ಬೇಕು ಎಂದು ಕೊನೆಯ ಹಂತದಲ್ಲಿ ಆಸ್ಪತ್ರೆಗಳಿಗೆ ಬರುತ್ತಾರೆ. ಇದರಿಂದ ಜೀವ ಉಳಿಸಲು ಕಷ್ಟವಾಗುತ್ತಿದೆ ಎಂದರು.
ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸಿದ್ದು, ಯಾರು ಕೂಡ ಮನೆಯಲ್ಲಿ ಚಿಕಿತ್ಸೆ ಪಡೆಯದೇ ಕೋವಿಡ್ ಕೇರ್ ಸೆಂಟರ್‍ಗೆ ಬರಬೇಕು.
ಮನೆಯಲ್ಲೆ ಚಿಕಿತ್ಸೆ ಪಡೆಯುವ ಸೋಂಕಿತನಿಗೆ ಪ್ರತ್ಯೇಕ ಕೊಠಡಿ ಮತ್ತು ಶೌಚಾಲಯ ಇರಬೇಕು. ಹಾಗೂ ಸೋಂಕಿತ ಮುಟ್ಟಿದ ವಸ್ತುಗಳನ್ನು ಮನೆಯ ಇತರೆ ಸದಸ್ಯರು ಮುಟ್ಟಬಾರದು. ಇಂತಹದೊಂದು ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸುವವರು ಮಾತ್ರ ಮನೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದರು.
ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಮಾತನಾಡಿ, ಕೊರೊನಾ ದಿನೇ ದಿನೇ ಹೆಚ್ಚಾಗುತ್ತಿದ್ದು ಗ್ರಾಮೀಣ ಜನರ ಬದುಕು ದುಸ್ತರವಾಗಿದೆ. ಜಗಳೂರಿನಂತಹ ತಾಲ್ಲೂಕಿನಲ್ಲಿ ಕೂಲಿ ಕಾರ್ಮಿಕರು ಹೆಚ್ಚಾಗಿದ್ದು ಅವರು ಜೀವನ ನಡೆಸಲು ನರೇಗ ಕೆಲಸ ಆಧಾರವಾಗಿದೆ. ಆದ್ದರಿಂದ ಉದ್ಯೋಗ ಖಾತ್ರಿಯೊಳಗೆ ಹೆಚ್ಚು ಕೆಲಸ ಕೊಡಿ ಎಂದು ಸಿಇಒಗೆ ಸೂಚನೆ ನೀಡಿದರು.
ಕೊರೊನಾ ಹಿನ್ನೆಲೆಯಲ್ಲಿ ಗುಂಪು ಕೆಲಸ ನಿಲ್ಲಿಸಿ ವೈಯಕ್ತಿಕ ನೆಲೆಯಲ್ಲಿ ಉದ್ಯೋಗ ಕೈಗೊಳ್ಳಲು ಅವಕಾಶ ನೀಡಿದರೆ ಅವರ ಜೀವನ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಕೃಷಿ ಕೂಲಿಕಾರರು ಅಗತ್ಯ ಕೃಷಿ ಪರಿಕರ ಖರೀದಿಸಲು ಹಾಗೂ ಕೃಷಿ ಚಟುವಟಿಕೆಗಳಿಗೂ ಅವಕಾಶ ಮಾಡಿಕೊಡಿ. ಲಾಕ್‍ಡೌನ್ ಇದ್ದರು ಕೃಷಿ ಚಟುವಟಿಕೆದಾರರಿಗೆ ರಿಯಾಯಿತಿ ಇದ್ದು ಪೊಲೀಸರು ಈ ವರ್ಗದ ಜನರಿಗೆ ಸಹಕಾರ ನೀಡಬೇಕು ಎಂದರು.
ಬೇರೆ ತಾಲ್ಲೂಕುಗಳಿಗೆ ಹೋಲಿಸಿದರೆ ಜಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು ಪರಿಸ್ಥಿತಿ ಹತೋಟಿಯಲ್ಲಿದೆ. ಇದು ಹೀಗೆ ಮುಂದುವರಿಯಲಿ. ತಾಲ್ಲೂಕು ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಬೆಡ್‍ಗಳಿದ್ದು ಅಗತ್ಯವಿರುವಷ್ಟು ಆಕ್ಸಿಜನ್ ಬಳಸಿ. ಅನಗತ್ಯವಾಗಿ ಆಕ್ಸಿಜನ್‍ನ್ನು ರೋಗಿಗಳಿಗೆ ಪೂರೈಕೆ ಮಾಡಬೇಡಿ. ಈಗಾಗಲೇ ತಾಲ್ಲೂಕಿನ 13 ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ನಿರ್ಧರಿಸಿದ್ದು, ಹೋಮ್ ಐಸೋಲೆಷನ್‍ನ್ನು ಸಂಪೂರ್ಣ ನಿಲ್ಲಿಸಿ ಸೋಂಕಿತರನ್ನು ಈ ಕೇಂದ್ರಗಳಿಗೆ ದಾಖಲಿಸಿ ಎಂದ ಅವರು ಹೆಚ್ಚು ಆಕ್ಸಿಜನ್ ಬಳಸಿದರೆ ಬ್ಲಾಕ್ ಫಂಗಸ್ ಬರುತ್ತದೆ ಎಂದು ವಿಜ್ಞಾನಗಳು ಹೇಳಿದ್ದಾರೆ ಎಂದರು.
ಶಾಸಕರು ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ ಮಾತನಾಡಿ, ಸರ್ಕಾರದಿಂದ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ 50 ಲಕ್ಷ ಅನುದಾನ ಬಿಡುಗಡೆಯಾಗಿದೆ. ಕ್ಷೇತ್ರದಲ್ಲಿ ಕೊರೊನಾ ತಡೆಗೆ ವಿವಿಧ ಪರಿಕರಗಳ ಖರೀದಿಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಸುಮಾರು ರೂ.1 ಕೋಟಿ ಅನುದಾನ ನೀಡಲಾಗುವುದು ಎಂದ ಅವರು, ತಾಲ್ಲೂಕಿನ ಕಾಟನಹಳ್ಳಿ ಗ್ರಾಮದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಜೀವ ಅಮೂಲ್ಯವಾದರಿಂದ ಕಾಪಾಡಲು ಎಲ್ಲರೂ ಪ್ರಯತ್ನ ಮಾಡೋಣ ಎಂದು ತಿಳಿಸಿದರು.
ನನಗೆ ಕೊರೊನಾ ಸೋಂಕು ಬಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ಅನೇಕರು ರಾಮಚಂದ್ರ ಹೋಗಿಬಿಟ್ಟ, ವೆಂಟಿಲೇಟರ್ ಗೆ ಹಾಕಿದ್ದಾರೆ. ಗುಂಡಿ ಸಿದ್ಧವಾಗಿದೆ ಎಂದು ಕೆಲವರು ಟೀಕೆ ಮಾಡಿದರು. ಆದರೆ ನನಗೆ ಅವರ ಟೀಕೆಗಳೇ ಶ್ರೀರಕ್ಷೆ ಎಂದ ಅವರು, ನಾನು ಆಸ್ಪತ್ರೆಯಲ್ಲಿದ್ದರೆ ನನ್ನ ಮನಸ್ಸು ಜಗಳೂರಿನಲ್ಲಿತ್ತು. ಬಹಳ ಮಂದಿ ಆತ್ಮೀಯರು ಅಗಲಿದ್ದಾರೆ. ಅಗಲಿದ್ದ ಕುಟುಂಬದವರೊಂದಿಗೆ ನಾವಿದ್ದೇವೆ, ಅವರ ಯೋಗಕ್ಷೇಮ ನೋಡುತ್ತೇನೆ ಎಂದು ಭಾವುಕರಾಗಿ ನುಡಿದರು. ಪಕ್ಷಾತೀತವಾಗಿ ಕಲ್ಲೆರುದ್ರೇಶ್ ತಮ್ಮ ಜತೆ ಕೈಜೋಡಿಸಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾತನಾಡಿ, ಕೋವಿಡ್-19 ಮೊದಲನೇ ಅಲೆ ಪ್ರಾರಂಭವಾದಾಗ ದಾವಣಗೆರೆಯಲ್ಲಿ ಒಂದೆರೆಡು ಕೇಸ್‍ಗಳು ಇತ್ತು. ಮೇ ತಿಂಗಳಿಂದ ಸೆಪ್ಟೆಂಬರ್ ವರೆಗೂ ಹೆಚ್ಚು ಪ್ರಕರಣಗಳು ದಾಖಲಾದವು. ಅಕ್ಟೋಬರ್ ತಿಂಗಳಲ್ಲಿ ಪ್ರಕರಣಗಳು ಕಡಿಮೆ ಆಗುತ್ತಾ ಬಂದವು. ಈ ಹಂತದಲ್ಲಿ ಕೋವಿಡ್ ಕುರಿತಾದ ಮಾಹಿತಿ ಕೊರತೆ ಇತ್ತು. ಆದರೆ 2ನೇ ಅಲೆಯಲ್ಲಿ ಮಾಹಿತಿ ಹಾಗೂ ಅನುಭವಗಳಡೆರೆಡು ಇದ್ದು ಸೋಂಕಿನ ವಿರುದ್ಧ ಹೋರಾಡಲು ಜನರು ಸ್ಪಂದನೆ ಕೊಡುತ್ತಿಲ್ಲ ಎಂದು ಬೇಸರಿಸಿದರು.
ಮೊದಲ ಹಂತದಲ್ಲಿ ಕೆಮ್ಮು, ಶೀತ, ಜ್ವರ, ತಲೆನೋವು ಬರುವ ಮೂಲಕ ಸೋಂಕಿನ ಲಕ್ಷಣಗಳು ಕಾಣಿಸಿಕೊಳ್ಳುತ್ತಿತ್ತು, 2ನೇ ಅಲೆಯಲ್ಲಿ ಈ ಲಕ್ಷಣಗಳೊಂದಿಗೆ ತಲೆನೋವು, ಕಣ್ಣು ಕೆಂಪಾಗುವುದು, ಉಸಿರಾಟದ ತೊಂದರೆ, ಅಲರ್ಜಿ ಸೇರಿದಂತೆ ಇನ್ನಿತರ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ. ಜನರು ನಿರ್ಲಕ್ಷ್ಯ ಮಾಡದೇ ಮೊದಲ ಹಂತದಲ್ಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಂಡರೆ ಜೀವ ಉಳಿಸುವ ಎಲ್ಲಾ ಸಾಧ್ಯತೆಗಳಿವೆ. ಆದರೆ ಜನರು ಕೊನೆಯ ಹಂತದಲ್ಲಿ ಸೋಂಕು ಶ್ವಾಸಕೋಶ ತಲುಪಿ ಉಸಿರಾಟದ ತೊಂದರೆಯಾದ ಬಳಿಕ ಬರುತ್ತಿದ್ದಾರೆ. ಇದರಿಂದ ಚಿಕಿತ್ಸೆ ನೀಡುವುದು ಕಷ್ಟವಾಗುತ್ತದೆ ಎಂದರು.
ಪ್ರತೀ ಗ್ರಾಮ ಪಂಚಾಯಿತಿ ಪಟ್ಟಣದಲ್ಲಿ ಹಾಗೂ ಸ್ಥಳೀಯ ಟಾಸ್ಕ್ ಪೋರ್ಸ್ ಸಮಿತಿಯವರು ಒಂದೊಂದು ಥೀಮ್ ಇಟ್ಟುಕೊಂಡು ಜನರಲ್ಲಿ ಕೊರೊನಾ ಸೋಂಕು ಹಾಗೂ ವ್ಯಾಕ್ಸಿನೇಷನ್ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ಈ ವೇಳೆ ಶಾಸಕ ರಾಮಚಂದ್ರಪ್ಪ ಜಗಳೂರಿನಲ್ಲಿ ಬ್ಲಾಕ್ ಫಂಗಸ್ ಗೆ ತುತ್ತಾದವರು ಎಷ್ಟು ಜನ ಇದ್ದಾರೆ? ಇದಕ್ಕೆ ಬೇಕಾದ ಔಷಧಿಗಳು ಸಿಗುತ್ತಿದ್ದೇಯೇ ಎಂದು ಪ್ರಶ್ನಿಸಿದರು.
ಇದಕ್ಕೆ ಡಾ.ರಾಘವನ್ ಜಗಳೂರು ತಾಲ್ಲೂಕಿನಲ್ಲಿ ಇಲ್ಲಿಯವೆರಗೂ ಯಾರಿಗೂ ಬ್ಲಾಕ್ ಫಂಗಸ್ ಬಂದಿಲ್ಲ. ಈ ಖಾಯಿಲೆ ಬಂದವರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುತ್ತಿದ್ದು, ಬೇಕಾದ ಔಷಧಿಗಳನ್ನು ಪಡೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.
ಸಭೆಯಲ್ಲಿ ಸಿಇಒ ವಿಜಯ ಮಹಾಂತೇಶ್ ದಾನಮ್ಮನವರ್, ಡಿಹೆಚ್‍ಒ ಡಾ.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಸೇರಿದಂತೆ ತಾಲ್ಲೂಕು ಅಧಿಕಾರಿಗಳು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.
ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

