Connect with us

ದಿನದ ಸುದ್ದಿ

ದಾವಣಗೆರೆ | ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕಠಿಣ ಕ್ರಮ ; ಮೇ. 21 ರಿಂದ 24 ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‍ಡೌನ್ : ಸಚಿವ ಭೈರತಿ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ತಾಲ್ಲೂಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸಾಂಕ್ರಾಮಿಕ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನೇ ದಿನೇ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ರೋಗ ಹರಡುವಿಕೆಯ ಸರಪಳಿಯನ್ನು ತುಂಡರಿಸಲು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೆಲವು ನಿಬಂಧನೆಗಳನ್ನು ಒಳಪಡಿಸಿ, ಮೇ. 21 ರಂದು ಬೆಳಿಗ್ಗೆ 10 ಗಂಟೆಯಿಂದ ಮೇ. 24 ರಂದು ಬೆಳಿಗ್ಗೆ 06 ಗಂಟೆಯವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸಲಾಗಿದೆ.

ಮುಂದೆ ಸಂಭವಿಸಬಹುದಾದ ಅನಾಹುತವನ್ನು ತಡೆಗಟ್ಟುವ ಸಲುವಾಗಿ ಸಂಪೂರ್ಣ ಲಾಕ್‍ಡೌನ್‍ಗೆ ಸಾರ್ವಜನಿಕರು ಸಹಕರಿಸುವಂತೆ ಕೈಮುಗಿದು ಮನವಿ ಮಾಡಿಕೊಳ್ಳುತ್ತೇನೆ ಎಂದು ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ ಹೇಳಿದರು.

ಜಿಲ್ಲೆಯಲ್ಲಿ ಮೇ. 21 ರಿಂದ ಮೂರು ದಿನಗಳ ಕಾಲ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸುವ ಕುರಿತಂತೆ ವಿವರಗಳನ್ನು ನೀಡಲು ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಇತ್ತೀಚೆಗೆ ನಡೆಸಿದ ಪ್ರಗತಿ ಪರಿಶೀಲಾ ಸಭೆಯಲ್ಲಿ ಪ್ರಸ್ತುತ ಕೋವಿಡ್-19 ಪರಿಸ್ಥಿತಿಯನ್ನು ಪರಿಗಣಿಸಿ ಪುನರಾವಲೋಕನ ಮಾಡಲಾಗಿತ್ತು. ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್ ಸಾಂಕ್ರ್ರಾಮಿಕ ರೋಗ ತಡೆಗಟ್ಟಲು ಹೆಚ್ಚುವರಿಯಾಗಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ.

ಕಳೆದ ಮೇ. 12 ರಿಂದ 24 ರವರೆಗೆ ಕಠಿಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿತ್ತು. ಆದರೆ ಪ್ರಕರಣಗಳ ಸಂಖ್ಯೆ ಏರುತ್ತಲೆ ಇದೆ. ಹೀಗಾಗಿ ರೋಗ ಹರಡುವಿಕೆಯ ಸರಪಳಿಯನ್ನು ತುಂಡರಿಸಲು ಇನ್ನಷ್ಟು ಕಠಿಣ ಕ್ರಮ ಜರುಗಿಸುವುದು ಅನಿವಾರ್ಯವಾದ ಕಾರಣ ಮೂರು ದಿನ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ.

ಮೇ. 24 ರ ಬಳಿಕ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಖ್ಯಮಂತ್ರಿಗಳೇ ನಿರ್ಧಾರ ಕೈಗೊಳ್ಳಲಿದ್ದಾರೆ. ಸಾರ್ವಜನಿಕರು ಮುಂದೆ ಸಂಭವಿಸಬಹುದಾದ ಅನಾಹುತವನ್ನು ತಡೆಗಟ್ಟಲು ಮೂರು ದಿನಗಳ ಕಾಲ ಜಾರಿಗೊಳಿಸಿರುವ ಸಂಪೂರ್ಣ ಲಾಕ್‍ಡೌನ್‍ಗೆ ಸಹಕರಿಸಲು ಸಾರ್ವಜನಿಕರಲ್ಲಿ ಕೈಮುಗಿದು ಬೇಡಿಕೊಳ್ಳುತ್ತೇನೆ ಎಂದರು.

ಸಂಪೂರ್ಣ ಲಾಕ್‍ಡೌನ್ ನಿಬಂಧನೆಗಳು

ಜಿಲ್ಲೆಯಾದ್ಯಂತ ಮೇ. 21 ರಿಂದ ಮೇ. 24 ರವರೆಗೆ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶದ ಅನ್ವಯ, ಎಲ್ಲಾ ಅಂಗಡಿ ಮುಂಗಟ್ಟುಗಳು/ವಾಣಿಜ್ಯ/ಕೈಗಾರಿಕಾ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಅಗತ್ಯ ಚಟುವಟಿಕೆಗಳಿಗೆ ವಾಹನಗಳಲ್ಲಿ ಸಂಚರಿಸುವುದನ್ನು ನಿರ್ಬಂಧಿಸಿ, ನಡೆದುಕೊಂಡು ಹೊಗಲು ಮಾತ್ರ ಅವಕಾಶ ನೀಡಲಾಗಿದೆ.

ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ಮದುವೆ ಸಮಾರಂಭಕ್ಕೆ ಈಗಾಗಲೇ ನೀಡಲಾಗಿರುವ ಅನುಮತಿ ಪ್ರಕರಣಗಳಲ್ಲಿ ಕೇವಲ 10 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಮದುವೆಗಳಲ್ಲಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆಯನ್ನು ನಿರ್ಬಂಧಿಸಲಾಗಿದೆ. ಉಳಿದ ಎಲ್ಲಾ ಸಾಮಾಜಿಕ, ಧಾರ್ಮಿಕ ಸಭೆ ಸಮಾರಂಭಗಳನ್ನು ಮೇ. 24 ರ ಬೆಳಿಗ್ಗೆ 6.00 ಗಂಟೆಯವರೆಗೆ ನಿರ್ಬಂಧಿಸಲಾಗಿದೆ.

ಅಂತ್ಯಸಂಸ್ಕಾರ/ಶವ ಸಂಸ್ಕಾರಗಳಲ್ಲಿ ಗರಿಷ್ಟ 5 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಿದೆ. ದಾವಣಗೆರೆ ಜಿಲ್ಲೆಗೆ ಆಗಮಿಸುವವರನ್ನು ಪ್ರತೀ ಚೆಕ್ ಪೋಸ್ಟ್‍ಗಳಲ್ಲಿ ವಿಚಾರಣೆ ನಡೆಸಿ, ದಾವಣಗೆರೆ ಜಿಲ್ಲೆಯಲ್ಲಿ ವಾಸ್ತವ್ಯ ಹೂಡುವುದಾದಲ್ಲಿ ಎಲ್ಲಿ ತಂಗುತ್ತಾರೆ ಎಂಬ ಬಗ್ಗೆ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆನ್ನು ಪಡೆದುಕೊಳ್ಳಲಾಗುವುದು ಹಾಗೂ ಹೊರ ಜಿಲ್ಲೆಯಿಂದ ಆಗಮಿಸುವವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್‍ನಲ್ಲಿ ಇರಬೇಕು.

ವಾಹನ ಬಳಕೆಯನ್ನು ತುರ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಬಳಸಬಹುದು, ವೈದ್ಯಕೀಯ ದಾಖಲೆಗಳನ್ನು ಚೆಕ್ ಪೋಸ್ಟ್‍ಗಳಲ್ಲಿ ತೋರಿಸಬೇಕು. ಇತರೆ ಎಲ್ಲಾ ಖಾಸಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ವೈದ್ಯಕೀಯ ಹಾಗೂ ತುರ್ತು ಸೇವೆಗಳ ಎಲ್ಲಾ ಅಧಿಕಾರಿಗಳು/ಸಿಬ್ಬಂದಿಗಳ ಕರ್ತವ್ಯ ನಿಮಿತ್ತ ಓಡಾಟಕ್ಕೆ ಯಾವುದೆ ನಿರ್ಬಂಧವಿರುವುದಿಲ್ಲ. ಆದರೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ತಪಾಸಣಾ ಸಿಬ್ಬಂದಿಗಳಿಗೆ ತೋರಿಸಬೇಕು.

ಕ್ಲಿನಿಕ್, ಆಸ್ಪತ್ರೆ, ಲಸಿಕೆ ಹಾಗೂ ಪರೀಕ್ಷೆ ಉದ್ದೇಶಗಳಿಗೆ ಕನಿಷ್ಟ ವೈದ್ಯಕೀಯ ದಾಖಲೆಗಳು, ವೈದ್ಯ ಸಲಹಾ ಚೀಟಿ, ಆಸ್ಪತ್ರೆಯಲ್ಲಿ ದಾಖಲಾದ ವಿವರಗಳ ರುಜುವಾತಿನೊಂದಿಗೆ ಸಂಚರಿಸಲು ಅನುಮತಿಸಲಾಗಿದೆ.

ಹೋಟೆಲ್, ರೆಸ್ಟೋರೆಂಟ್‍ಗಳು, ಉಪಾಹಾರ ಗೃಹಗಳು ಪಾರ್ಸಲ್ ಸೇವೆಗಳನ್ನು ಗ್ರಾಹಕರ ಮನೆ ಬಾಗಿಲಿಗೆ ವಿತರಿಸಲು ಮಾತ್ರ ಅನುಮತಿ ಇದೆ. ಯಾವುದೇ ರೀತಿಯ ಪಾರ್ಸ್‍ಲ್‍ಗಳನ್ನು ಗ್ರಾಹಕರು ನೇರವಾಗಿ ಖರೀದಿಸಲು ಅವಕಾಶವಿರುವುದಿಲ್ಲ.

ಕೋವಿಡ್-19ಕ್ಕೆ ಸಂಬಂಧಿಸಿದ ಕಾರ್ಯಕ್ಕೆ ನಿಯೋಜಿಸಿದ ಎಲ್ಲಾ ಕಛೇರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸರ್ಕಾರದ ಆದೇಶ ಸಂಖ್ಯೆ ಆರ್‍ಡಿ/158/ಟಿಎನ್‍ಆರ್/2020 ದಿ.07.05.2021ರಂತೆ ಕಾರ್ಯನಿರ್ವಹಿಸಬೇಕು. ಆದರೆ, ಈ ಕಛೇರಿಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ.

ಜಿಲ್ಲೆಯಲ್ಲಿ ಕಛೇರಿ ವೇಳೆಯನ್ನು ಮೀರಿ ತಮ್ಮ ಕರ್ತವ್ಯಗಳಿಗೆ ಹಾಜರಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಜಿಲ್ಲೆಯ ನ್ಯಾಯಾಂಗದ ಅಧಿಕಾರಿ/ಸಿಬ್ಬಂದಿಗಳು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸುವುದಕ್ಕೆ ಅನುಮತಿಸಿದೆ.

ಸರ್ಕಾರದ ಆದೇಶದ ಪ್ರಕಾರ ಸರ್ಕಾರೇತರ ಸಂಸ್ಥೆಗಳ ಕಛೇರಿಗಳು, ಇತರೆ ಎಲ್ಲಾ ಕಛೇರಿಗಳ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸಬೇಕು. ತುರ್ತು ಸೇವೆಗಳಿಗೆ ಸಂಬಂಧಪಟ್ಟ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ, ಅರೆ ಸರ್ಕಾರಿ ಮತ್ತು ಖಾಸಗಿ ಕಛೇರಿಗಳ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸಬೇಕು.

ಹಾಲು, ಡೈರಿ ಹಾಗೂ ಹಾಲಿನ ಬೂತುಗಳು ಮತ್ತು ಮೊಟ್ಟೆ ಅಂಗಡಿಗಳು ಮಾತ್ರ ಪ್ರತಿದಿನ ಬೆಳಿಗ್ಗೆ 6.00 ಗಂಟೆಯಿಂದ ಬೆ.10.00 ಗಂಟೆಯವರೆಗೆ ತೆರೆಯಲು ಅನುಮತಿಸಲಾಗಿದೆ. ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬುಲೆನ್ಸ್ ಅಗ್ನಿಶಾಮಕ ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳು, ವಿದ್ಯುತ್, ಪೆಟ್ರೋಲ್ ಪಂಪ್, ಆಮ್ಲಜನಕ ಉತ್ಪಾದನಾ ಘಟಕ, ನೀರು, ನೈರ್ಮಲ್ಯ ಸೇವೆಗಳಿಗೆ ಅನುಮತಿಸಲಾಗಿದೆ.

ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳ ಸಂಚಾರಕ್ಕೆ ಅಧಿಕೃತ ಪ್ರಯಾಣ ದಸ್ತಾವೇಜುಗಳು/ಟಿಕೆಟ್‍ಗಳನ್ನು ತೋರಿಸಿದರೆ ಮಾತ್ರ ಸಂಚರಿಸಲು ಅನುಮತಿಸಿದೆ. ಪಡಿತರ ನ್ಯಾಯಬೆಲೆ ಅಂಗಡಿಗಳು ತೆರೆಯಲು ಕೊಪನ್ ವ್ಯವಸ್ಥೆಯಿಂದ ಜನ ಗುಂಪು ಸೇರದಂತೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಷರತ್ತಿಗೊಳಪಟ್ಟು ಅನುಮತಿಸಲಾಗಿದೆ.

ಇಂದಿರಾ ಕ್ಯಾಂಟೀನ್ ತೆರೆಯಲು ಅನುಮತಿಸಲಾಗಿದೆ. ದಿನಪತ್ರಿಕೆ, ದೃಶ್ಯಮಾಧ್ಯಮಗಳ ಸೇವೆಗಳಿಗೆ ಅನುಮತಿಸಲಾಗಿದೆ. ಎಲ್ಲಾ ರೀತಿಯ ಸರಕುಗಳ ಸಾಗಾಣಿಕೆಗೆ ಮತ್ತು ಖಾಲಿ ವಾಹನಗಳಿಗೆ ಅನುಮತಿಸಲಾಗಿದೆ, ವಿಶೇಷವಾಗಿ ಅಮ್ಲಜನಕ ತರುವ ವಾಹನಗಳನ್ನು ತಡೆರಹಿತ ಸಾಗಾಟವನ್ನು ಅನುಮತಿಸಲಾಗಿದೆ.

ನಿರ್ಗತಿಕರ ಕೇಂದ್ರ, ವೃದ್ದಾಶ್ರಮ, ಬಾಲಮಂದಿರ, ಬಾಲಾಶ್ರಮ, ಅನಾಥಶ್ರಮ ಇವುಗಳಿಗೆ ಅನುಮತಿ ಇದೆ. ಅಂತರ ರಾಜ್ಯ ಮತ್ತು ಅಂತರ ಜಿಲ್ಲಾ ವ್ಯಕ್ತಿಗಳ ಸಂಚಾರವನ್ನು ಸರ್ಕಾರದ ಆದೇಶದಂತೆ ಅನುಮತಿ ಇದೆ. ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ ಹಾಪ್-ಕಾಮ್ಸ್ ಮೂಲಕ ಮಾತ್ರ ಸಾರ್ವಜನಿಕರಿಗೆ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ಹಾಪ್-ಕಾಮ್ಸ್ ಲಭ್ಯವಿಲ್ಲದಿರುವ ಪ್ರದೇಶಗಳಲ್ಲಿ ಆಯುಕ್ತರು, ಮಹಾನಗರಪಾಲಿಕೆ ಮತ್ತು ಸಂಬಂಧಪಟ್ಟ ತಹಶೀಲ್ದಾರರು ಸ್ಥಳೀಯವಾಗಿ ಸೀಮಿತ ಸಂಖ್ಯೆಯಲ್ಲಿ ತಳ್ಳುವ ಗಾಡಿಯ ಮೂಲಕ ಮನೆ ಬಾಗಿಲಿಗೆ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ಮಾರಾಟ ಮಾಡಲು ಅನುಮತಿ ಕಲ್ಪಿಸಲಾಗಿದೆ.

ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿಗಳು, ಮಾಂಸ ಮತ್ತು ಮೀನು, ಹಾಗೂ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ. ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ಮತ್ತು ಬಾರ್‍ಗಳನ್ನು ಈ ಅವಧಿಯಲ್ಲಿ ನಿಷೇಧಿಸಲಾಗಿರುತ್ತದೆ.

ಅಡುಗೆ ಅನಿಲ ಕಾರ್ಯನಿರ್ವಹಣೆಯನ್ನು ಮನೆ ಬಾಗಿಲಿಗೆ ತಲುಪಿಸುವ ಷರತ್ತಿಗೊಳಪಟ್ಟು ಕಾರ್ಯನಿರ್ವಹಣೆಯನ್ನು ಅನುಮತಿಸಲಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಸಗಟು ಮಾರಾಟಗಾರರು ತರಕಾರಿ ಹಾಗೂ ಹಣ್ಣುಗಳನ್ನು ಖರೀದಿಸಲು ಹಾಗೂ ಬೇರೆಡೆ ಸಾಗಿಸಲು ಯಾವುದೇ ನಿರ್ಬಂಧ ಇರುವುದಿಲ್ಲ.

ನಿರ್ಮಾಣ ಸ್ಥಳದಲ್ಲಿಯೇ ವಾಸವಾಗಿರುವ ಕಾರ್ಮಿಕರನ್ನು ಬಳಸಿಕೊಂಡು ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿಸಲಾಗಿದೆ. ಇ-ಕಾಮರ್ಸ್/ಹೋಮ್ ಡೆಲಿವರಿ ಸೇವೆಗಳ ಮುಖಾಂತರ ಎಲ್ಲಾ ವಸ್ತುಗಳನ್ನು ಮನೆಗೆ ಸರಬರಾಜು ಮಾಡಲು ಅನುಮತಿಸಲಾಗಿದೆ.

ವಿನಾಯತಿ ನೀಡಿರುವ ಅಗತ್ಯ ಚಟುವಟಿಕೆಗಳಲ್ಲಿ ಕೋವಿಡ್-19ರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ನಿಗದಿಪಡಿಸಿದ ಮಾರ್ಗಸೂಚಿ ಅಥವಾ ನಿಬಂಧನೆಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ವಿಭಾಗ 51 ರಿಂದ 60ರ ಅನ್ವಯ ಮತ್ತು ಐಪಿಸಿ ಸೆಕ್ಷನ್ 188 ರಂತೆ ಹಾಗೂ ಕರ್ನಾಟಕ ಸಾಂಕ್ರಾಮಿಕ ಕಾಯ್ದೆ, 2005ರ ವಿಭಾಗ 4, 5 ಮತ್ತು 10ರಂತೆ ಕ್ರಮ ಜರುಗಿಸಲಾಗುವುದು ಎಂದರು.

ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಶಾಸಕರುಗಳಾದ ಪ್ರೊ. ಲಿಂಗಣ್ಣ, ಎಸ್.ಎ. ರವೀಂದ್ರನಾಥ್, ಮಹಾನಗರಪಾಲಿಕೆ ಮೇಯರ್ ಎಸ್.ಟಿ. ವೀರೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಿಜಯ ಮಹಾಂತೇಶ್ ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending