ದಿನದ ಸುದ್ದಿ
ದಾವಣಗೆರೆ | 800 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‍ಗೆ ಸಚಿವ ಭೈರತಿ ಬಸವರಾಜ್ ಚಾಲನೆ
ಸುದ್ದಿದಿನ,ದಾವಣಗೆರೆ : ಹೊನ್ನಾಳಿ ತಾಲ್ಲೂಕಿನ ಅರಬಗಟ್ಟೆ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ 800 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‍ನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ್ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ ಲೋಕಾರ್ಪಣೆಗೊಳಿಸಿದರು.
ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದ ಸಚಿವರಾದ ಬಿ.ಎ.ಬಸವರಾಜ್ ಮಾತನಾಡಿ, ಈ ಕೋವಿಡ್ ಕೇರ್ ಸೆಂಟರ್‍ನ ಉಪಯೋಗ ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕಿನ ಜನತೆಗೆ ದೊರೆಯುವಂತಾಗಬೇಕು. ಯಾವುದೇ ರೋಗ ಲಕ್ಷಣ ಕಂಡು ಬಂದ ತಕ್ಷಣ ಸೋಂಕಿತರು ಮನೆಗಳಲ್ಲೆ ಐಸೋಲೇಷನ್ ಆಗದೇ ಕೋವಿಡ್ ಸೆಂಟರ್‍ಗಳಿಗೆ ಬರಬೇಕು. ಇದರಿಂದ ಉತ್ತಮ ಆರೈಕೆ ಹಾಗೂ ಚಿಕಿತ್ಸೆ ದೊರೆತು ಸೋಂಕಿತರು ಬಹು ಬೇಗ ಗುಣಮುಖರಾಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಈ ತಾಲ್ಲೂಕಿನ ಶಾಸಕರಾದ ರೇಣುಕಾಚಾರ್ಯರವರು ಕಾರ್ಯ ಶ್ಲಾಘನೀಯ ಎಂದರು.
ಶಾಸಕರು ದಣಿವರಿಯದೇ ತಾಲ್ಲೂಕಿನಾದ್ಯಂತ ಸಂಚರಿಸಿ ಸೋಂಕಿತರಲ್ಲಿ ಮನೋಸ್ಥೈರ್ಯ ಹೆಚ್ಚಿಸುತ್ತಿದ್ದಾರೆ. ಇವರಿಗೆ ಜಿಲ್ಲಾಡಳಿತವು ಸಂಪೂರ್ಣ ಬೆಂಬಲ ನೀಡುತ್ತಿದ್ದು, ಉತ್ತಮ ಕಾರ್ಯ ತಾಲ್ಲೂಕಿನಲ್ಲಿ ಆಗುತ್ತಿದೆ. ಮತ್ತು ತಾಲ್ಲೂಕು ಆಡಳಿತ ಹಾಗೂ ಅಧಿಕಾರಿಗಳು ಬಹುವಾಗಿ ಶ್ರಮಿಸುತ್ತಿದ್ದಾರೆ. ಇದರಿಂದ ಸೋಂಕಿನ ಪ್ರಮಾಣವು ಕಡಿಮೆಯಾಗಲು ಸಹಕಾರಿಯಾಗಲಿದೆ ಎಂದರು.
ಇದನ್ನೂ ಓದಿ | ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ಕ್ರಮ : ಶಾಸಕ ಪ್ರೊ. ಲಿಂಗಣ್ಣ
ಮಾನ್ಯ ಮುಖ್ಯಮಂತ್ರಿಗಳಲ್ಲಿ ಇನ್ನು ಒಂದು ವಾರ ಅಥವಾ 15 ದಿನಗಳ ಕಾಲ ಲಾಕ್‍ಡೌನ್ ಮುಂದುವರಿಸಲು ಪ್ರಸ್ತಾಪಿಸುತ್ತೇನೆ ಎಂದ ಅವರು ಎರಡನೇ ಅಲೆ ಪ್ರಾರಂಭವಾದಾಗಿನಿಂದ ವಾರದಲ್ಲಿ ಎರಡು ದಿನ ಜಿಲ್ಲೆಯಲ್ಲಿ ವಾಸ್ತವ್ಯ ಮಾಡಿ ಎಲ್ಲಾ ತಾಲ್ಲೂಕುಗಳ ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇನೆ ಎಂದರು.
ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಮೊದಲ ಅಲೆ ಆರಂಭವಾದಾಗಿನಿಂದ ಎಲ್ಲರೊಳಗೂಡಿ ಕೋವಿಡ್ ನಿಯಂತ್ರಣಕ್ಕೆ ಅನೇಕ ಕಾರ್ಯಗಳನ್ನು ಮಾಡಲಾಗುತ್ತಿದೆ. ಅಧಿಕಾರಿಗಳ ಜನಪ್ರತಿನಿಧಿಗಳ ಸಹಕಾರದೊಂದಿಗೆ ಸಾರ್ವಜನಿಕರಿಗೆ ಮಾಸ್ಕ್, ಸ್ಯಾನಿಟೈಸರ್, ಫುಡ್ ಕಿಟ್ ನೀಡಲಾಗಿದೆ. ಹಾಗೂ 10 ಸಾವಿರ ಜನರಿಗೆ ಎರಡು ಹೊತ್ತು ಊಟ, 8 ಚೆಕ್ ಪೋಸ್ಟ್ ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಹಾಗೂ ಪ್ರತಿ ಹಳ್ಳಿಗಳಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಈ ಕೋವಿಡ್ ಕೇರ್ ಸೆಂಟರ್‍ನ್ನು 48 ತಾಸುನೊಳಗೆ ಸುಸಜ್ಜಿತ ಆರೈಕೆ ಕೇಂದ್ರವನ್ನಾಗಿ ಮಾಡಲಾಗಿದೆ. ರಸ್ತೆ, ವಿದ್ಯುತ್ ಸಂಪರ್ಕ, ನೀರಿನ ವ್ಯವಸ್ಥೆ, ಒಳ ಚರಂಡಿ ಎಲ್ಲವನ್ನು ಯುದ್ದೋಪಾದಿಯಲ್ಲಿ ಮಾಡಲಾಗಿದ್ದು ಒಂದು ಉತ್ತಮ ಸುಸಜ್ಜಿತ ಕೇಂದ್ರವಾಗಿದೆ. ಇಲ್ಲಿ ದಾಖಲಾಗಿರುವ ಎಲ್ಲರನ್ನು ಮನೆ ಮಕ್ಕಳಂತೆ ನೋಡಿಕೊಳ್ಳಲಾಗಿತ್ತಿದೆ ತಾಲ್ಲೂಕಿನಲ್ಲಿ 4 ಕೋವಿಡ್ ಕೇರ್ ಸೆಂಟರ್‍ಗಳಿದ್ದು, ಜನರು ಮನೆಯಲ್ಲಿ ಚಿಕಿತ್ಸೆ ಪಡೆಯದೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕು ಕೋವಿಡ್ ಕೇರ್ ಸೆಂಟರ್ಗಳಲ್ಲಿ ಆಶ್ರಯ ಪಡೆದಲ್ಲಿ ಮಾತ್ರ ಸೋಂಕು ಹರಡುವುದನ್ನು ತಡೆಗಟ್ಟಬಹುದು.
50 ಬೆಡ್‍ಗಳ ಹೊನ್ನಾಳಿ ತಾಲ್ಲೂಕು ಆಸ್ಪತ್ರೆಯನ್ನು 200 ಬೆಡ್‍ಗಳ ಆಸ್ಪತ್ರೆಯನ್ನಾಗಿ, 30 ಬೆಡ್‍ಗಳ ನ್ಯಾಮತಿ ಆಸ್ಪತ್ರೆಯನ್ನು 100 ಬೆಡ್‍ಗಳ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲಾಗುತ್ತಿದೆ. ಅವಳಿ ತಾಲ್ಲೂಕಿನಲ್ಲಿ ಇದುವರೆಗೂ ಯಾವುದೇ ಬೆಡ್ ಕೊರತೆ ಉಂಟಾಗಿಲ್ಲ ಎಂದರು.
ತಾಲ್ಲೂಕಿಗೆ 4 ಅಡ್ವಾನ್ಸ್ಡ್ ಲೈಫ್ ಆಂಬುಲೆನ್ಸ್‍ಗಳನ್ನು ನೀಡಲಾಗಿದ್ದು, 70 ಆಕ್ಸಿಜೆನ್ ವೆಂಟಿಲೇಟರ್‍ಗಳಿವೆ. 1 ಕೋಟಿ ವೆಚ್ಚದಲ್ಲಿನ ಆಕ್ಸಿಜನ್ ಘಟಕಕ್ಕೆ ಚಾಲನೆ ನೀಡಿದ್ದು ಮೊದಲ ಕಂತಿನ 50 ಲಕ್ಷ ಹಣವನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.
ಹೊಳೆ ಮೇಲಿನ ಕೆರೆಗಳನ್ನು ತುಂಬಿಸಲು 48 ಕೋಟಿ ಅನುದಾನ, ಹಳ್ಳಿಗಳಿಗೆ ಕುಡಿಯುವ ನೀರಿನ ಸರಬರಾಜು ಮಾಡಲು 68 ಕೋಟಿ ಬಿಡುಗಡೆಯಾಗಿದೆ. ಸರ್ಕಾರವು ಜನರನ್ನು ರಕ್ಷಿಸುವುದರ ಜೊತೆಗೆ ಅಭಿವೃದ್ಧಿ ಕಾರ್ಯವನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.
ಮೂರನೇ ಅಲೆ ಎದುರಿಸಲು ಸರ್ಕಾರ, ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಅಧಿಕಾರಿಗಳು ಸಿದ್ದರಾಗಿದ್ದು ಜನರ ಸಹಕಾರ ಅಗತ್ಯವಾಗಿದೆ. ಮೊದಲನೆ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ಎರಡನೇ ಹಂತದಲ್ಲಿ ಹಿರಿಯ ನಾಗರೀಕರಿಗೆ, ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ 4 ನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಜನರು ಯಾವುದೇ ಅಪಪ್ರಚಾರಕ್ಕೆ ಮನ್ನಣೆ ಕೊಡದೇ ಕಡ್ಡಾಯವಾಗಿ ಲಸಿಕೆಯನ್ನು ಪಡೆಯಬೇಕು ಆದಲ್ಲಿ ಮಾತ್ರ ಸೋಂಕನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರಾಸ್ತಾವಿಕವಾಗಿ ಮಾತನಾಡಿ, 800 ಹಾಸಿಗೆ ಸಾಮಥ್ರ್ಯದ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸುತ್ತಿರುವುದರಿಂದ ಕೋವಿಡ್ ವಿರುದ್ಧ ಹೋರಾಡಲು ನಮಗೆ ಆನೆ ಬಲ ಬಂದಿದೆ. ನಮ್ಮ ಅಧಿಕಾರಿಗಳು ಮತ್ತು ಆರೋಗ್ಯ ಸಿಂಬಂದಿಗಳು ಹೋಮ್ ಐಸೋಲೇಟ್ ಆಗಿರುವ ರೋಗಿಗಳನ್ನು ಕೋವಿಡ್ ಕೇರ್ ಸೆಂಟರ್‍ಗೆ ಸ್ಥಳಾಂತರಿಸುತಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ 4773 ಸಕ್ರಿಯ ಸೋಂಕಿತರ ಪ್ರಕರಣಗಳಿದ್ದು, 897 ಸೋಂಕಿತರು ಆಸ್ಪತ್ರೆಗಳಲ್ಲಿ, 196 ಸೋಂಕಿತರು ತಾಲ್ಲೂಕು ಆಸ್ಪತ್ರೆಗಳಲ್ಲಿ, 1153 ಸೋಂಕಿತರು ಕೋವಿಡ್ ಕೇರ್ ಸೆಂಟರ್ ಮತ್ತು 2527 ಜನ ಸೋಂಕಿತರು ಹೋಮ್ ಐಸೊಲೇಷನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾರೆ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳಲ್ಲಿ 3422 ಪ್ರಕರಣಗಳು ದಾಖಲಾಗಿದ್ದು 2089 ಜನ ಸೋಂಕಿತರು ಬಿಡುಗಡೆ ಹೊಂದಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ 26 ಕೋವಿಡ್ ಕೇರ್ ಸೆಂಟರ್‍ಗಳಿವೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ವಿಜಯ ಮಹಾಂತೇಶ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಉಪವಿಭಾಗ ಅಧಿಕಾರಿ ಮಮತಾ ಹೊಸಗೌಡರ್, ಡಿಎಚ್‍ಒ ಡಾ. ನಾಗರಾಜು, ತಹಶೀಲ್ದಾರ್ ಪಟ್ಟರಾಜ ಗೌಡ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


