ಲೈಫ್ ಸ್ಟೈಲ್
ಮೆಕ್ಕೆಜೋಳ ಬೆಳೆಗೆ ಲದ್ದಿಹುಳು ಬಾಧೆ : ಹತೋಟಿ ಕ್ರಮ
ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕಿನ ಕಸಬಾ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ ಕಾಡಜ್ಜಿ, ಬೇತೂರು, ಕಡ್ಲೇಬಾಳು, ಕಕ್ಕರಗೊಳ್ಳ, ಬಸವನಾಳು ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಸುಮಾರು 250 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೇಜೋಳ ಬಿತ್ತನೆಯಾಗಿದ್ದು, ಬಿತ್ತನೆ ಹಂತದಿಂದ 30 ದಿನದ ಬೆಳೆಯಿದ್ದು, ಬೆಳೆಯಲ್ಲಿ ಲದ್ದಿ ಹುಳುವಿನ ಬಾಧೆ ಹೆಚ್ಚಾಗಿ ಕಂಡು ಬಂದಿದೆ.
ಈ ಕೀಟವು ಬೆಳೆಯ ಎಲೆ, ಕಾಂಡದ ಭಾಗವನ್ನು ಕೆರೆದು ತಿನ್ನುತ್ತದೆ ಮತ್ತು ಎಲೆಯ ಭಾಗದಲ್ಲಿ ಸರಣಿ ತೂತುಗಳನ್ನು ಕೊರೆಯುತ್ತದೆ. ಒಂದು ಚಿಟ್ಟೆಯು 1500 ರಷ್ಟು ಮೊಟ್ಟೆಗಳನ್ನು ಇಟ್ಟು ಶೀಘ್ರ ಗತಿಯಲ್ಲಿ ಸಂತಾನ ವೃದ್ಧಿಸಿಕೊಳ್ಳುತ್ತಾ ಆ ಮೂಲಕ ಬೆಳೆಗಳಿಗೆ ತೀವ್ರ ಹಾನಿ ಮಾಡುತ್ತದೆ.ಆದ್ದರಿಂದ, ರೈತರು ಸಾಮೂಹಿಕವಾಗಿ ಅಗತ್ಯ ಹತೋಟಿ ಕ್ರಮ ಕೈಗೊಂಡರೆ ಮಾತ್ರ ಬೇಸಿಗೆ ಬೆಳೆಯನ್ನು ಉಳಿಸಿಕೊಳ್ಳಲು ಸಾಧ್ಯ.
ಲದ್ದಿ ಹುಳು ಹತೋಟಿ ಮಾಡಲು ರೈತರು ಇಮಾಮೆಕ್ಟಿನ್ ಬೆಂಜೋಯೆಟ್ ಅನ್ನು 0.4 ಗ್ರಾಂ/ಪ್ರತಿ ಲೀಟರ್ ನೀರಿಗೆ ಅಥವಾ ಲ್ಯಾಂಬ್ಡಾ ಸೈಲ್ಹೋತ್ರಿನ್ 2 ಮಿಲಿ/ಪ್ರತಿ ಲೀಟರ್ ನೀರಿಗೆ ಅಥವಾ ಸ್ಪಿನೋಸೈಡ್ –3 ಮಿಲಿ/ಪ್ರತಿ ಲೀಟರ್ ನೀರಿಗೆ ಬೆರೆಸಿ ಬೆಳೆಯ ಸುಳಿಯಲ್ಲಿ ಪೂರ್ಣವಾಗಿ ನೆನೆಯುವ ಹಾಗೆ ಸಿಂಪರಣೆ ಮಾಡಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ, ಸಲಹೆ ಪಡೆಯುವಂತೆ ಸಹಾಯಕ ಕೃಷಿ ನಿರ್ದೇಶಕ ರೇವಣಸಿದ್ದನಗೌಡ ಹೆಚ್.ಕೆ. ರೈರಿಗೆ ತಿಳಿಸಿದರು.
ಮೆಕ್ಕೆಜೋಳ ಬೆಳೆಗೆ ಲದ್ದಿಹುಳು ಬಾಧೆ ಕುರಿತು ರೈತರ ಅನಿಸಿಕೆ
ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿಗಳು ಲಿಂಗದಹಳ್ಳಿ ಗ್ರಾಮದ ಹನುಮಂತಪ್ಪ ಬಿನ್ ಗೋಪಾಲಪ್ಪನವರ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರೈತ ಹನುಮಂತಪ್ಪರವರು ಲದ್ದಿಹುಳು ಕುರಿತು ತಮ್ಮ ಅನುಭವ ಹಂಚಿಕೊಂಡರು, ಲದ್ದಿ ಹುಳು ಕಂಡ ತಕ್ಷಣವೇ ಇಲಾಖಾ ಅಧಿಕಾರಿಗಳ ಭೇಟಿ ಮಾಡಿ, ಅವರ ಮಾರ್ಗದರ್ಶನದಂತೆ 8 ರಿಂದ 10 ದಿನ ಅಂತರದಲ್ಲಿ ಎರಡು ಬಾರಿ ಇಮಾಮೆಕ್ಟಿನ್ ಬೆಂಜೋಯೇಟ್ ಸಿಂಪರಣೆ ಮಾಡಿದ್ದು, ಹುಳು ಹತೋಟಿಗೆ ಬಂದಿದೆ ಮತ್ತು 10 ದಿನಗಳ ನಂತರ ಇನ್ನೊಂದು ಸಿಂಪರಣೆ ಕೈಗೊಳ್ಳುತ್ತಿದ್ದೇನೆ. ಆದರೆ, ಈ ಕೀಟವು ಒಂದು ಹೊಲದಿಂದ ಇನ್ನೊಂದು ಹೊಲಕ್ಕೆ ಹರಿದು ಹೋಗುವುದರಿಂದ ಇದನ್ನು ತಡೆಯಲು ಪ್ರತಿಯೊಬ್ಬ ರೈತರು ಸಾಮೂಹಿಕವಾಗಿ ಸಂರಕ್ಷಣೆ ಕ್ರಮವನ್ನು ಅತೀ ತುರ್ತಾಗಿ ಕೈಗೊಂಡರೆ, ಹತೋಟಿ ಮಾಡಲು ಸಾಧ್ಯ ಎಂದು ಅಭಿಪ್ರಾಯಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ
ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.
ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.
ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.
ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.
ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


