ದಿನದ ಸುದ್ದಿ
ದಾವಣಗೆರೆ | ಲಾಕ್‍ಡೌನ್ ಮುಕ್ತಾಯದ ಬಳಿಕ ಭದ್ರಾ ಮೇಲ್ದಂಡೆ ಯೋಜನೆಗೆ ಚಾಲನೆ : ಸಚಿವ ಬಿ.ಎ.ಬಸವರಾಜ
ಸುದ್ದಿದಿನ,ದಾವಣಗೆರೆ : ಕೊರೊನಾ ಲಾಕಡೌನ್ ಮುಕ್ತಾಯ ನಂತರ ಭದ್ರಾ ಮೇಲ್ದಂಡೆ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಹೇಳಿದರು.
ಸೋಮವಾರ ಜಗಳೂರಿನ ತರಳಬಾಳು ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಮತ್ತು ಪಟ್ಟಣ ಪಂಚಾಯತ್ ವತಿಯಿಂದ ಅಯೋಜಿಸಲಾಗಿದ್ದ ಕೊರೊನಾ ನಿಯಂತ್ರಣ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವನಾಗಿ ಜಿಲ್ಲೆ ಹಾಗೂ ತಾಲ್ಲೂಕಿನ ಎಲ್ಲೆಡೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸುವುದು ನನ್ನ ಕರ್ತವ್ಯವಾಗಿದೆ ಎಂದರು.
ತಾಲ್ಲೂಕಿನ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತ ಹೆಚ್ಚಿನ ಒತ್ತು ನೀಡಬೇಕು. ಹದಿನೈದು ದಿನಕೊಮ್ಮೆ ಜಿಲ್ಲೆಗೆ ಭೇಟಿ ನೀಡುತ್ತೇನೆÉ. ಏನಾದರೂ ಸಮಸ್ಯೆಗಳು ಇದ್ದಲ್ಲಿ ನನ್ನ ಗಮನಕ್ಕೆ ತಂದರೆ ಪರಿಶೀಲನೆ ನಡೆಸುವುದಾಗಿ ಹೇಳಿದರು.
ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಾಗೂ ಕೆಲವು ಸರ್ಕಾರಿ ಇಲಾಖೆ ಅಧಿಕಾರಿಗಳು ಕೋವಿಡ್ 19 ವಿರುದ್ಧ ಸರಿಯಾಗಿ ಕರ್ತವ್ಯ ನಿಭಾಯಿಸಬೇಕು. ಇಲ್ಲವಾದಲ್ಲಿ ಅವರ ವಿರುದ್ದ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಶಾಂತಕುಮಾರಿ, ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಹನುಮಂತರಾಯ, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243