ದಿನದ ಸುದ್ದಿ
ಪತ್ರಕರ್ತರಿಗೆ ನಿವೇಶನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ: ವರದಿಗಾರ ಕೂಟ ಹಾಗೂ ಪತ್ರಕರ್ತರಿಗೆ ನಿವೇಶನ ಒದಗಿಸುವ ಬಗ್ಗೆ ಸಚಿವರು, ಶಾಸಕರೊಂದಿಗೆ ಚರ್ಚಿಸಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಹೇಳಿದರು.
ನಗರದ ಕುವೆಂಪು ಕನ್ನಡ ಭವನದಲ್ಲಿ ಶನಿವಾರ ನಡೆದ ಜಿಲ್ಲಾ ವರದಿಗಾರರ ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ, ಮಾಧ್ಯಮ ದಿನಾಚರಣೆ, ಮಾಧ್ಯಮ ಪ್ರಶಸ್ತಿ ಪ್ರದಾನ ಮತ್ತು ಜೀವಮಾನ ಸಾಧನೆಗೆ ಗೌರವ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈಗಾಗಲೇ ಪತ್ರಕರ್ತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಅದೇ ರೀತಿ ಆರೋಗ್ಯಕ್ಕೆ ಆರ್ಥಿಕ ನೆರವು ನೀಡಲು ಪಾರ್ವತಮ್ಮ ಶಾಮನೂರು ಶಿವಶಂಕರಪ್ಪನವರ ಹೆಸರಿನಲ್ಲಿ ಚಿಂತನೆ ನಡೆಸಲಾಗುವುದು. ಸಮಾಜವನ್ನು ತಿದ್ದುವ ಮಹತ್ತರ ಜವಾಬ್ದಾರಿ ಇರುವ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಸಾರ, ಸುದ್ದಿಗಳ ವೈಭವೀಕರಣಕ್ಕೆ ಕಡಿವಾಣ ಬೀಳಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.
ಸಂವಿಧಾನದ ನಾಲ್ಕನೇ ಅಂಗವಾಗಿ ಕೆಲಸ ಮಾಡುತ್ತಿರುವ ಮಾಧ್ಯಮವೆಂದರೇ ಜನರಿಗೆ ನಂಬಿಕೆ ಹೆಚ್ಚಿರುತ್ತದೆ. ಸಮಾಜ ತಿದ್ದುವ ಜವಾಬ್ದಾರಿಯನ್ನು ಮಾಧ್ಯಮ ಹೊಂದಿದೆ. ಸ್ವಾತಂತ್ರ್ಯ ತಂದುಕೊಡುವಲ್ಲಿ, ಮೂಢನಂಬಿಕೆಗಳನ್ನು ದೂರಾಗಿಸುವಲ್ಲಿ ಮಾಧ್ಯಮಗಳು ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರವಾಗಿದೆ. ಇಂತಹ ಮಾಧ್ಯಮಗಳು ಸುಳ್ಳು ಸುದ್ದಿಗಳಿಗೆ ಮತ್ತು ಸುದ್ದಿಗಳ ವೈಭವೀಕರಣಕ್ಕೆ ಕಡಿವಾಣ ಹಾಕಬೇಕಿದೆ ಎಂದು ಅವರು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಸುಳ್ಳು ಸುದ್ದಿಗಳು ಎಗ್ಗಿಲ್ಲದೇ ಬಿತ್ತರಗೊಳ್ಳುತ್ತಿವೆ. ಕೆಲ ಟಿವಿ ಮಾಧ್ಯಮಗಳು ತಾವೇ ಸ್ವಯಂಘೋಷಿತ ನ್ಯಾಯಾಲಯಗಳಾಗಿ ಪ್ರಕರಣದ ವಿಚಾರಣೆ ನಡೆಸಿ, ತೀರ್ಪು ನೀಡುವಂತೆ ವರ್ತಿಸುತ್ತವೆ. ಇದೆಲ್ಲದರ ನಿಯಂತ್ರಣ ಆಗಬೇಕು ಎಂದರು.
ಉತ್ತಮ ಸಮಾಜ ಕಟ್ಟುವಲ್ಲಿ ಪತ್ರಕರ್ತರ ಜವಾಬ್ದಾರಿ ಮಹತ್ವದ್ದಾಗಿದೆ. ಮಾಧ್ಯಮಗಳು ಜನರಿಗೆ ವಿಷಯ
ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಪತ್ರಕರ್ತರು ಸಮಾಜದ ఎల్ల ವರ್ಗದ ಜನರಿಗೆ ಧ್ವನಿಯಾಗಿ ಕೆಲಸ ಮಾಡುತ್ತಾರೆ. ಪತ್ರಕರ್ತರಿಗೆ ಸಂಘಟನೆಯೇ ಧ್ವನಿಯಾಗಬೇಕು. ಈ ದಿಸೆಯಲ್ಲಿ ಜಿಲ್ಲಾ ವರದಿಗಾರರ ಕೂಟವು ಕೆಲಸ ಮಾಡಲಿ ಎಂದು ಆಶಿಸಿದರು.
ಪತ್ರಿಕೆ ಓದುವುದರಿಂದ ಜ್ಞಾನ, ಏಕಾಗ್ರತೆ ಹೆಚ್ಚಾಗುತ್ತದೆ. ಯುವಜನರಲ್ಲಿ ಪತ್ರಿಕೆ ಓದುವ ಹವ್ಯಾಸವನ್ನು ಉತ್ತೇಜಿಸುವ ಕೆಲಸವು ಮನೆ ಹಾಗೂ ಶಾಲಾ-ಕಾಲೇಜಿನಿಂದ ಶುರುವಾಗಬೇಕು ಎಂದು ಅವರು ಆಶಿಸಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಮಾತನಾಡಿ, ಪತ್ರಿಕಾ ರಂಗವು ಸಮಾಜವನ್ನು ತಿದ್ದುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪತ್ರಕರ್ತರು ಸಮಾಜದ ಕನ್ನಡಿಯಂತೆ ಸರಿ-ತಪ್ಪು ತೋರುವ ಕೆಲಸ ಮಾಡುತ್ತಾರೆ. ಆದರೂ ಇತ್ತೀಚಿನ ದಿನಗಳಲ್ಲಿ ಮಾಧ್ಯಮ ರಂಗ ಹಳಿ ತಪ್ಪುತ್ತಿರುವಂತೆ ಭಾಸವಾಗುತ್ತದೆ. ಸುದ್ದಿಗಳ ಅತಿಯಾದ ವೈಭವೀಕರಣ ಕಡಿಮೆಯಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ ಎಸ್.ಬಡದಾಳ್, ಸುಮಾರು 17 ವರ್ಷಗಳ ಹಿಂದೆ ಸ್ವಾಭಿಮಾನಿ ಪತ್ರಕರ್ತರು ಸೇರಿಕೊಂಡು ಕಟ್ಟಿದ ವರದಿಗಾರರು ಕೂಟವು ಈವರೆಗೆ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ. ಪತ್ರಕರ್ತರಿಗಾಗಿ ಸಾಕಷ್ಟು ಚಟುವಟಿಕೆ ಕೈಗೊಂಡಿರುವ ಜೊತೆಗೆ 46 ಪತ್ರಕರ್ತರಿಗೆ ನಿವೇಶನ ಕೊಡಿಸಿರುವುದು ಕೂಟದ ದೊಡ್ಡ
ಸಾಧನೆಯಾಗಿದೆ. ಇದಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿನ ಎಲ್ಲಾ ಸಚಿವರು, ಶಾಸಕರು ಸಹಕಾರ ನೀಡಿದ್ದಾರೆ ಎಂದು ಸ್ಮರಿಸಿದರು.
ಪತ್ರಕರ್ತರಿಗೆ ಸಮಾಜದಲ್ಲಿ ಗೌರವವಿದ್ದರೂ, ಸಂಕಷ್ಟದಲ್ಲಿರುವ ಪತ್ರಕರ್ತರು ಕೂಡ ಇದ್ದಾರೆ. ಬೇರೆಯವರ ಸಮಸ್ಯೆಗಳಿಗೆ ಧ್ವನಿಯಾಗುವ ಪತ್ರಕರ್ತರ ಗೋಳು ಕೇಳುವವರು ಇಲ್ಲದಂತಾಗಿದೆ. ಜೀವನ ಭದ್ರತೆ ಇಲ್ಲದ ಪತ್ರಿಕಾ ವೃತ್ತಿಯು ನೀರ ಮೇಲಿನ ಗುಳ್ಳೆ ಇದ್ದಂತೆ. ಇಂತಹ ಸಂದರ್ಭದಲ್ಲಿ ಅನಾರೋಗ್ಯಪೀಡಿತ ಪತ್ರಕರ್ತರ ಚಿಕಿತ್ಸೆಗೆ ನೆರವು ಸಿಗಬೇಕು. ಈಗಲೂ ನಿವೇಶನ ಪಡೆಯದ ಸಾಕಷ್ಟು ಜನ ಪತ್ರಕರ್ತರಿದ್ದು, ಅಂತಹವರಿಗೆ ಆದ್ಯತೆ ಮೇರೆಗೆ ರಿಯಾಯಿತಿ ದರದಲ್ಲಿ ನಿವೇಶನ ನೀಡಬೇಕು. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ವರದಿಗಾರರ ಕೂಟಕ್ಕೆ ಸ್ವಂತ ನಿವೇಶನ ಒದಗಿಸಲು ಸ್ಥಳೀಯ ಸಚಿವರು, ಶಾಸಕರು, ಜನಪ್ರತಿನಿಧಿಗಳು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಗಣೇಶ ಕಮಲಾಪುರ, ವಿನಾಯಕ ನಾಯ್ಕ ಪೂಜಾರಿ, ದೇವಿಕಾ ಸುನೀಲ್, ಕೆ.ಆರ್.ಪುನೀತ್ ಆಪ್ತಿ, ಬಿ.ಹನುಮಂತರಾವ್, ಎಚ್.ನಿಂಗರಾಜ್, ಚನ್ನಬಸವ ಶೀಲವಂತ, ಎ.ಬಿ.ರುದ್ರಮ್ಮ ಅವರುಗಳಿಗೆ ವಾರ್ಷಿಕ ಮಾಧ್ಯಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೀವಮಾನ ಸಾಧನೆಗಾಗಿ ವೀರಪ್ಪ ಎಂ.ಬಾವಿ, ಎನ್.ಆರ್.ನಟರಾಜ್, ಜಿ.ಎಂ.ಆರ್.ಆರಾಧ್ಯ, ಎಂ.ಶಶಿಕುಮಾರ್, ಎಸ್.ಎ.ಗಂಗರಾಜು, ಐ.ಗುರುಶಾಂತಪ್ಪ, ಬಸವರಾಜ್ ಐರಣಿ, ಬಕ್ಕೇಶ್ ನಾಗನೂರು ಅವರುಗಳಿಗೆ ಗೌರವ ಸನ್ಮಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ವರದಿಗಾರರ ಕೂಟದ ನೂತನ ವೆಬಸೈಟ್‌ಗೆ ಚಾಲನೆ ನೀಡಲಾಯಿತು.
ಹರಿಹರ ಶಾಸಕ ಬಿ.ಪಿ.ಹರೀಶ್, ಮಹಾನಗರಪಾಲಿಕೆ ಮೇಯರ್ ಬಿ.ಎಚ್.ವಿನಾಯಕ ಪೈಲ್ವಾನ್, ಕೂಟದ ಗೌರವಾಧ್ಯಕ್ಷ ಬಿ.ಎನ್. ಮಲ್ಲೇಶ್, ಪ್ರಧಾನ ಕಾರ್ಯದರ್ಶಿ ಎಂ.ವೈ.ಸತೀಶ, ಉಪಾಧ್ಯಕ್ಷರಾದ ಕೆ.ಚಂದ್ರಣ್ಣ, ಮಂಜುನಾಥ ಗೌರಕ್ಕಳವರ್, ಎಂ.ಬಿ.ನವೀನ್, ಎ.ಎಲ್. ತಾರಾನಾಥ, ರಾಮಪ್ರಸಾದ್, ಮಲ್ಲಿಕಾರ್ಜುನ ಕಬ್ಬರು, ಸದಾನಂದ ಹೆಗಡೆ, ಸಾರ್ವಜನಿಕ ಸಂಪರ್ಕ ಪ್ರತಿನಿಧಿ ಪಿ.ಎಸ್.ಲೋಕೇಶ, ಕಾರ್ಯದರ್ಶಿ ತೇಜಸ್ವಿನಿ ಪ್ರಕಾಶ, ಕೆ.ಜೈಮುನಿ, ಅನಿತಾ, ಬಿ.ಸಿಕಂದರ್ ಸೇರಿದಂತೆ ಕೂಟದ ನೂತನ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243



