ದಿನದ ಸುದ್ದಿ
ಪ್ರಜ್ವಲ್ ಪೋಲಿಸರಿಗೆ ಶರಣಾಗಿ ವಿಚಾರಣೆ ಎದುರಿಸಬೇಕು : ಮೊಮ್ಮಗನಿಗೆ ಮಾಜಿ ಪ್ರಧಾನಿ ದೇವೇಗೌಡ ಎಚ್ಚರಿಕೆ
ಸುದ್ದಿದಿನ ಡೆಸ್ಕ್ : ಪ್ರಜ್ವಲ್‌ನು ಎಲ್ಲಿದ್ದರೂ ಬಂದು ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ತಮ್ಮ ಟ್ವಿಟರ್ ಖಾತೆ ಮೂಲಕ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಎಚ್ಚರಿಕೆ ನೀಡಿದ್ದಾರೆ.
ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು ಎಂದಿದ್ದಾರೆ.
ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ ಎಂದು ನುಡಿದಿದ್ದಾರೆ.
ದೇವೇಗೌಡ ಟ್ವೀಟ್ 👇
I have issued a warning to @iPrajwalRevanna to return immediately from wherever he is and subject himself to the legal process. He should not test my patience any further. pic.twitter.com/kCMuNJOvAo
— H D Deve Gowda (@H_D_Devegowda) May 23, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243