Connect with us

ದಿನದ ಸುದ್ದಿ

ರಾಜ್ಯಸಭೆಯಲ್ಲಿ ಕಲಾಪಕ್ಕೆ ಅಡ್ಡಿ; ಪ್ರತಿಪಕ್ಷಗಳ 19 ಸದಸ್ಯರ ಅಮಾನತು

Published

on

ಸುದ್ದಿದಿನ ಡೆಸ್ಕ್ : ರಾಜ್ಯಸಭೆಯಲ್ಲಿ ನಿಯಮಾವಳಿ ಉಲ್ಲಂಘಿಸಿ ಅನುಚಿತವಾಗಿ ನಡೆದುಕೊಂಡ 19 ಪ್ರತಿಪಕ್ಷಗಳ ಸದಸ್ಯರನ್ನು ಈ ವಾರದ ಅಂತ್ಯದವರೆಗೆ ಕಲಾಪದಿಂದ ಅಮಾನತುಗೊಳಿಸಲಾಗಿದೆ.

ತೃಣಮೂಲ ಕಾಂಗ್ರೆಸ್‌ನ 7, ಡಿಎಂಕೆಯ ಮೂವರು, ಟಿಆರ್‌ಎಸ್‌ನ ಮೂವರು, ಸಿಪಿಎಂನ ಇಬ್ಬರು ಹಾಗೂ ಸಿಪಿಐನ ಒಬ್ಬ ಸದಸ್ಯರು ಇವರಲ್ಲಿ ಸೇರಿದ್ದಾರೆ. ದೋಲಾಸೇನ್, ಸುಶ್ಮಿತಾ ದೇವ್, ಡಾಕ್ಟರ್ ಸಂತಾನು ಸೇನ್, ಮೌಸಂ ನೂರ್, ಮಹಮದ್ ಅಬ್ದುಲ್ಲಾ, ಎಸ್. ಕಲ್ಯಾಣಸುಂದರಮ್, ಡಾಕ್ಟರ್ ಕನಿಮೌಳಿ ಸೋಮು, ವಿ.ಶಿವದಾಸನ್, ಸಂತೋಷ್ ಕುಮಾರ್ ಹಾಗೂ ಲಿಂಗಯ್ಯ ಯಾದವ್ ಅಮಾನತುಗೊಂಡ ಸದಸ್ಯರಲ್ಲಿ ಸೇರಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ರಾಜ್ಯಸಭೆ ಮರು ಸಮಾವೇಶಗೊಂಡಾಗ ತೃಣಮೂಲ ಕಾಂಗ್ರೆಸ್, ಆಮ್‌ಆದ್ಮಿ ಪಕ್ಷ, ಎಡಪಕ್ಷಗಳು, ಡಿಎಂಕೆ ಹಾಗೂ ಇತರೆ ಪಕ್ಷಗಳ ಸದಸ್ಯರು ಸಭಾಪತಿಗಳ ಮುಂದಿನ ಅಂಗಳಕ್ಕೆ ಇಳಿದು, ಬೆಲೆ ಏರಿಕೆ, ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಿರುವ ಸರ್ಕಾರದ ಕ್ರಮದ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಉಪಸಭಾಪತಿ ಹರಿವಂಶ್, ಸದನದಲ್ಲಿ ಸುವ್ಯವಸ್ಥೆ ಕಾಪಾಡಿಕೊಳ್ಳುವಂತೆ ಪದೆ ಪದೇ ಮನವಿ ಮಾಡಿಕೊಂಡರೂ ಪ್ರತಿಭಟನಾನಿರತ ಸದಸ್ಯರು ಕಿವಿಗೊಡಲಿಲ್ಲ. ಕಲಾಪವನ್ನು ನಿರಂತವಾಗಿ ಅಡ್ಡಿಪಡಿಸುತ್ತಿರುವ ಸದಸ್ಯರ ವಿರುದ್ಧ ನಿಯಮ 256 ರಡಿ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ಆದರೆ, ಪ್ರತಿಭಟನಾನಿರತ ಸದಸ್ಯರು ಗದ್ದಲ, ಕೋಲಾಹಲ ಮುಂದುವರಿದಾಗ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಳೀಧರನ್, ಪೀಠಕ್ಕೆ ಅಗೌರವ ತೋರಿಸಿ, ಅನುಚಿತವಾಗಿ ವರ್ತಿಸುತ್ತಿರುವ ಸದಸ್ಯರನ್ನು ಅಮಾನತುಗೊಳಿಸಲು ನಿಯಮ 256ರ ಅಡಿ ಗೊತ್ತುವಳಿಯನ್ನು ಮಂಡಿಸಿದರು.

ಗೊತ್ತುವಳಿಯನ್ನು ಸದನ ಧ್ವನಿಮತದಿಂದ ಅಂಗೀಕರಿಸಿತು. ಉಪಸಭಾಪತಿ ಪದೆ ಪದೇ ಮನವಿ ಮಾಡಿಕೊಂಡರೂ ಅಮಾನತುಗೊಂಡ ಸದಸ್ಯರು ಸದನದಿಂದ ಹೊರ ನಡೆಯಲು ನಿರಾಕರಿಸಿದಾಗ ಮೊದಲು 2 ಬಾರಿ, ನಂತರ ದಿನದ ಮಟ್ಟಿಗೆ ಕಲಾಪವನ್ನು ಮುಂದೂಡಲಾಯಿತು.

ಭೋಜನ ಅವಧಿಗೆ ಮುನ್ನ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಸದಸ್ಯರು ಬೆಲೆ ಏರಿಕೆ, ಗುಜರಾತ್ ಕಳ್ಳಭಟ್ಟಿ ದುರಂತ ಹಾಗೂ ಇತರ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿ, ಗದ್ದಲ ನಿರ್ಮಿಸಿದ್ದರಿಂದ ಕಲಾಪವನ್ನು ಮಧ್ಯಾಹ್ನ 12 ಗಂಟೆವರೆಗೆ ಮುಂದೂಡಲಾಗಿತ್ತು. 12.30 ಕ್ಕೆ ಮರು ಸಮಾವೇಶಗೊಂಡಾಗ ಆಮ್ ಆದ್ಮಿ ಪಕ್ಷ, ಡಿಎಂಕೆ, ಎಡಪಕ್ಷ, ಟಿಎಂಸಿ ಸೇರಿದಂತೆ ಇತರ ಪಕ್ಷಗಳ ಸದಸ್ಯರು ಸಭಾಪತಿಗಳ ಮುಂದಿನ ಅಂಗಳಕ್ಕೆ ಇಳಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇಡೀ ದೇಶ ಸದನದ ಕಲಾಪವನ್ನು ವೀಕ್ಷಿಸುತ್ತಿದೆ. ಹಾಗಾಗಿ ಸದಸ್ಯರು ತಮ್ಮ ಆಸನಗಳಿಗೆ ಮರಳಿ ಕಲಾಪ ನಡೆಸಲು ಸಹಕರಿಸಬೇಕು ಎಂದು ಉಪ ಸಭಾಪತಿ ಹರಿವಂಶ್ ಹಲವು ಬಾರಿ ಮನವಿ ಮಾಡಿಕೊಂಡರು.

ಈ ಗದ್ದಲಗಳ ನಡುವೆಯೇ ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಂಡರು. ಫಲಕ ಪ್ರದರ್ಶಿಸಿ, ಕಲಾಪ ಅಡ್ಡಿಪಡಿಸುವ ಸದಸ್ಯರ ವಿರುದ್ಧ ನಿಯಮ 256ರಂತೆ ಕ್ರಮ ಜರುಗಿಸುವುದಾಗಿ ಉಪಸಭಾಪತಿ ಎಚ್ಚರಿಕೆ ನೀಡಿದರು.

ಇಂದು ಬೆಳಗ್ಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆ ನಿಯಮ 267ರಡಿ ಪ್ರತಿಪಕ್ಷಗಳ ಸದಸ್ಯರು ಮಂಡಿಸಿದ ನಿಲುವಳಿ ಸೂಚನೆಗಳನ್ನು ಸಭಾಪತಿ ಎಂ. ವೆಂಕಯ್ಯನಾಯ್ಡು ತಿರಸ್ಕರಿಸಿದರು.

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಸದಸ್ಯರು ಸಭಾಪತಿ ಪೀಠದ ಎದುರಿನ ಅಂಗಳಕ್ಕೆ ಇಳಿದು ಗುಜರಾತ್‌ನಲ್ಲಿ ನಡೆದ ಕಳ್ಳಭಟ್ಟಿ ದುರಂತ ಕುರಿತ ಫಲಕಗಳನ್ನು ಪ್ರದರ್ಶಿಸಿ, ಘೋಷಣೆಗಳನ್ನು ಕೂಗಿದರು. ಈ ನಡುವೆ, ಸಭಾಪತಿ ಅವರು ಕಲಾಪವನ್ನು ಮಧ್ಯಾಹ್ನ 12ಕ್ಕೆ ಮುಂದೂಡಿದರು. ಇದಕ್ಕೂ ಮುನ್ನ ಕಾರ್ಗಿಲ್ ವಿಜಯ್ ದಿನದ ೨೩ನೇ ವರ್ಷಾಚರಣೆ ಅಂಗವಾಗಿ ಹುತಾತ್ಮ ಮತ್ತು ಧೈರ್ಯಶಾಲಿ ಯೋಧರಿಗೆ ಸದನ ಗೌರವ ನಮನ ಸಲ್ಲಿಸಿದರು.

ಸಚಿವ ಪಿಯೂಷ್ ಗೋಯಲ್ ಹೇಳಿದ್ದು

ರಾಜ್ಯಸಭೆಯಲ್ಲಿ ಈ ವಾರ 19 ಪ್ರತಿಪಕ್ಷ ಸದಸ್ಯರ ಅಮಾನತುಗೊಳಿಸುವ ನಿರ್ಧಾರವನ್ನು ಭಾರವಾದ ಹೃದಯದಿಂದ ಕೈಗೊಳ್ಳಲಾಗಿದೆ ಎಂದು ಮೇಲ್ಮನೆಯ ಸಭಾನಾಯಕರೂ ಆಗಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಭಾಪತಿಗಳ ಪೀಠದ ಮನವಿಗಳನ್ನು ನಿರ್ಲಕ್ಷಿಸಿದ ಹಾಗೂ ರಾಜ್ಯಸಭೆಯ ಕಲಾಪವನ್ನು ನಿರಂತರವಾಗಿ ಅಡ್ಡಿಪಡಿಸಿದ್ದಕ್ಕಾಗಿ ಈ ಸಂಸದರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡು ಸಂಸತ್ತಿಗೆ ಮರಳಿದ ನಂತರ ಬೆಲೆ ಏರಿಕೆ ವಿಷಯ ಕುರಿತಂತೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದು ಸ್ಪಷ್ಟಪಡಿಸಿದ ಅವರು, ಸುಗಮವಾಗಿ ಕಲಾಪ ನಡೆಸಲು ಸಹಕರಿಸುವಂತೆ ಪ್ರತಿಪಕ್ಷ ಸದಸ್ಯರಿಗೆ ಮತ್ತೊಮ್ಮೆ ಮನವಿ ಮಾಡಿಕೊಂಡರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending