ಬಹಿರಂಗ
ಡಾ.ಅಂಬೇಡ್ಕರ್‌ರವರ ಬರಹಗಳ ವಿರುದ್ಧ ವ್ಯವಸ್ಥಿತ ಅಸ್ಪೃಶ್ಯತಾಚರಣೆ..?
- ರಘೋತ್ತಮ ಹೊ.ಬ
ಭಾರತದ ಯಾವುದೇ ಪುಸ್ತಕದ ಅಂಗಡಿಗಳಲ್ಲಿ ಡಾ.ಅಂಬೇಡ್ಕರ್‌ರವರು ಬರೆದಿರುವ ಪುಸ್ತಕಗಳು ದೊರೆಯುವುದಿಲ್ಲ. ಹೌದು, ಇದು ಕಟು ಸತ್ಯ. ನಾವು ಅಥವಾ ಅಂಬೇಡ್ಕರರ ಬಗ್ಗೆ ಓದಲು ಆಸಕ್ತಿ ಇರುವ ಯಾರೇ ಆದರೂ ಡಾ.ಅಂಬೇಡ್ಕರ್ ರವರು ಬರೆದಿರುವ ಪುಸ್ತಕಗಳನ್ನು ಖರೀದಿಸಲು ಭಾರತದ ಯಾವುದೇ ಪುಸ್ತಕದ ಮಳಿಗೆಗೆ ಹೋದರು ಪುಸ್ತಕಗಳು ಅವರಿಗೆ ದೊರೆಯುವುದೇ ಇಲ್ಲ! ತಮಾಷೆಗೆ ಹೇಳುತ್ತಿಲ್ಲ.
ಮೊನ್ನೆ ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿರುವ ಬೆಂಗಳೂರಿನ ಉದಯೋನ್ಮುಖ ನರರೋಗತಜ್ಞರಾದ ಡಾ.ಲಿಂಗರಾಜುರವರು ಫೇಸ್‌ಬುಕ್‌ನಲ್ಲಿ ಲೈವ್‌ನಲ್ಲಿ ಅಂತರರಾಷ್ಟ್ರೀಯ ವೇದಿಕೆಯೊಂದರ ಆಹ್ವಾನದ ಮೇರೆಗೆ ಡಾ.ಅಂಬೇಡ್ಕರರ Annihilation of caste (ಜಾತಿ ವಿನಾಶ) ಕೃತಿ ಬಗ್ಗೆ ಮಾತನಾಡಲು ಒಪ್ಪಿಕೊಂಡು ಪುಸ್ತಕ ಹುಡುಕಲು ಬೆಂಗಳೂರಿನ ಪುಸ್ತಕ ಮಳಿಗೆಯೊಂದಕ್ಕೆ ಹೊರಟಿದ್ದಾರೆ.
ಆದರೆ ಅವರಿಗೆ ಡಾ.ಅಂಬೇಡ್ಕರರು ಬರೆದಿರುವ ಒಂದು ಪುಸ್ತಕ ಕೂಡ ಸಿಕ್ಕಿಲ್ಲ. ಏಷ್ಯಾದ ಬೃಹತ್ ಪುಸ್ತಕ ಮಾರಾಟ ಮಳಿಗೆ ಎಂದು ಬೋರ್ಡ್ ಹಾಕಿಕೊಂಡಿರುವ, ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಹಲವಾರು ಬ್ರ‍್ಯಾಂಚ್‌ಗಳನ್ನು ಹೊಂದಿರುವ ಆ ಪುಸ್ತಕ ಮಳಿಗೆಯಲ್ಲಿ ಟಾಲ್ ಸ್ಟಾಯ್, ಕಾರ್ಲ್ ಮಾರ್ಕ್ಸ್ ಹೀಗೆ ವಿದೇಶಿ ಚಿಂತಕರ ಕೃತಿಗಳು ಸಿಗುತ್ತವೆ. ಆದರೆ ಸ್ವದೇಶಿ ಡಾ.ಅಂಬೇಡ್ಕರರ ಪುಸ್ತಕಗಳು ಸಿಗುವುದಿಲ್ಲ. ಇದು ಆ ಮಳಿಗೆಯೊಂದರ ಕತೆಯಲ್ಲ, ಭಾರತದ ಎಲ್ಲಾ ನಗರಗಳ ಪುಸ್ತಕ ಮಳಿಗೆಗಳ ಕತೆಯಿದು.
ಈ ಬಗ್ಗೆ ಮಾತನಾಡಿರುವ ಡಾ.ಲಿಂಗರಾಜುರವರು “ಅಂಬೇಡ್ಕರರ ಆ ಕೃತಿ ಕಾನೂನುಬಾಹಿರವೇ? ಇಲ್ಲ. ಏಕೆಂದರೆ ಅದನ್ನು ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾನಿಲಯವೇ ಪಠ್ಯಪುಸ್ತಕವಾಗಿ ಮಾನ್ಯತೆ ನೀಡಿದೆ. ಆದರೆ ವಾಸ್ತವ ಏನೆಂದರೆ ಕೆಲವು ದುಷ್ಟ ಶಕ್ತಿಗಳು ಅಂಬೇಡ್ಕರರ ಕೃತಿಗಳು ಯಾರಿಗೂ ಸಿಗದಂತೆ, ಜನರನ್ನು ತಲುಪುದಂತೆ ತಡೆದಿವೆ” ಎನ್ನುತ್ತಾರೆ. ಕೊನೆಯಲ್ಲಿ ಅಮೆಜಾನ್ ಮೂಲಕ ತಾನು ಪುಸ್ತಕ ತರಿಸಿಕೊಂಡಿದ್ದಾಗಿ ಡಾ.ಲಿಂಗರಾಜು ಹೇಳಿಕೊಂಡಿದ್ದಾರೆ.
ಹಾಗಿದ್ದರೆ ಅಂಬೇಡ್ಕರರ ಕೃತಿಗಳಿಗೆ ಬೇಡಿಕೆ ಕಡಿಮೆಯೇ? ಆ ಕಾರಣಕ್ಕೆ ಮಳಿಗೆಗಳು ತರಿಸುತ್ತಿಲ್ಲವೆ ಎಂದರೆ ಖಂಡಿತ ಇಲ್ಲ. ವಾಸ್ತವ ಏನೆಂದರೆ ಡಾ.ಅಂಬೇಡ್ಕರರು ಬರೆದಿರುವ ಕೃತಿಗಳಿಗೆ ಭಾರೀ ಬೇಡಿಕೆ ಇದೆ. ಸಾಹಿತ್ಯ ಸಮ್ಮೇಳನಗಳಲ್ಲಿ ಅತಿ ಹೆಚ್ಚು ಮಾರಾಟ ಆಗುವುದು ಡಾ.ಅಂಬೇಡ್ಕರ್ ಸಂಬಂಧಿಸಿದ ವೈಚಾರಿಕ ಕೃತಿಗಳೇ! ಡಾ.ಅಂಬೇಡ್ಕರರ ಹೆಸರಿನ ಕಾರಣಕ್ಕೆ ಆ ಕೃತಿಗಳಿಗೆ ಬೇಡಿಕೆಯೇ? ಖಂಡಿತ ಇಲ್ಲ. ಅಂಬೇಡ್ಕರರ ಕೃತಿಗಳಿಗೆ ಈ ಮಟ್ಟಿಗಿನ ಬೇಡಿಕೆಗೆ ಕಾರಣ ಆ ಕೃತಿಗಳ ವಸ್ತು, ವಿಚಾರಗಳನ್ನು ಉತ್ಕೃಷ್ಟ ಇಂಗ್ಲಿಷ್ ಭಾಷೆಯಲ್ಲಿ ಮಂಡಿಸಿರುವ ಶೈಲಿ, ಓದುಗನನ್ನು ಹಿಡಿದಿಡುವ ಧಾಟಿ.
ಕುತೂಹಲಕರ ವಿಚಾರವೆಂದರೆ ಅಂಬೇಡ್ಕರರ ಒಂದು ಪುಟ್ಟ ಕೃತಿ ಒಂದು ಬೃಹತ್ ಚಳುವಳಿಯನ್ನೇ ಒಂದು ಬೃಹತ್ ರಾಜಕೀಯ ಪಕ್ಷವನ್ನೇ ಹುಟ್ಟು ಹಾಕಿದೆ ಎಂದರೆ…!1970ರ ಸಂದರ್ಭದಲ್ಲಿ ದಿವಂಗತ ಕಾನ್ಷೀರಾಮ್‌ರವರಿಗೆ ಡಾ.ಅಂಬೇಡ್ಕರ್ ರವರ ಈ “ಅನ್ನಿಹಿಲೇಷನ್ ಆಫ್ ಕ್ಯಾಸ್ಟ್” ಕೃತಿ ಸಿಕ್ಕಿ ಇಡೀ ರಾತ್ರಿ ಅವರು ಅದನ್ನು ಓದಿ ಜ್ಞಾನೋದಯಗೊಂಡು ಬಹುಜನ ಸಮಾಜ ಪಕ್ಷದ ಉದಯಕ್ಕೆ ಕಾರಣರಾಗುತ್ತಾರೆ! ಆ ಮಟ್ಟಿಗಿನ ಭವ್ಯ ವಸ್ತು, ಸ್ಪೂರ್ತಿ ಚಿಲುಮೆ ಇರುವ ಕೃತಿಗಳು ಡಾ.ಅಂಬೇಡ್ಕರರದು.
ಈ ನಿಟ್ಟಿನಲ್ಲಿ ಅವರ “ಅನ್ನಿಹಿಲೇಷನ್ ಆಫ್ ಕ್ಯಾಸ್ಟ್” ಜೊತೆಗೆ “ರೆವಲ್ಯೂಷನ್ ಅಂಡ್ ಕೌಂಟರ್ ರೆವಲ್ಯೂಷನ್”, “ರಿಡಲ್ಸ್ ಇನ್ ಹಿಂದೂಯಿಸಂ”, “ವೂ ವರ್ ಶೂದ್ರಾಸ್”, “ದಿ ಅಂಟಚಬಲ್ಸ್”, “ಪ್ರಾಬ್ಲಂ ಆಫ್ ರುಪೀ“, “ಪಾಕಿಸ್ತಾನ್ ಆರ್ ಪಾರ್ಟಿಷನ್ ಆಫ್ ಇಂಡಿಯಾ “, “ಬುದ್ಧ ಅಂಡ್ ಹಿಸ್ ಧಮ್ಮ” ಹೀಗೆ ಡಾ.ಅಂಬೇಡ್ಕರರ ಇತರೆ ಕೃತಿಗಳು ಅವುಗಳ ವಸ್ತುಗಳ ಜೊತೆಗೆ ಪ್ರಾಚೀನ ಭಾರತದ ಇತಿಹಾಸ, ಭಾರತದ ಸ್ವಾತಂತ್ರ‍್ಯ ಸಂದರ್ಭದ ಘಟನೆಗಳು, ಈ ದೇಶದ ಸಾಮಾಜಿಕ ಕಟುಸತ್ಯಗಳನ್ನು ಐತಿಹಾಸಿಕ ದಾಖಲೆಗಳೊಡನೆ ಮನಮುಟ್ಟುತ್ತವೆಯೆಂದರೆ, ಕಣ್ಣಿಗೆ ಕಟ್ಟುವಂತೆ ಚಿತ್ರಿಸುತ್ತವೆಯೆಂದರೆ…, ಅದರಲ್ಲೂ ಅವರ “ಪ್ರಾಬ್ಲಂ ಆಫ್ ರುಪೀ” ಪುಸ್ತಕ ಈ ದೇಶದ ಹಣಕಾಸು ವ್ಯವಸ್ಥೆ ನಿಯಂತ್ರಣ ಮಾಡುವ ಉತ್ಕೃಷ್ಟ ಬ್ಯಾಂಕ್ ಆದ “ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ” ಸ್ಥಾಪನೆಗೆ ಕಾರಣವಾದರೆ “ಪಾಕಿಸ್ತಾನ್ ಆರ್ ಪಾರ್ಟಿಷನ್ ಆಫ್ ಇಂಡಿಯಾ” ಕೃತಿ ದೇಶ ವಿಭಜನೆಯ ಕಾರ್ಯವನ್ನು ಸುಲಲಿತವಾಗಿ ನಡೆಯಲಿಕ್ಕೆ ನೆರವಾಯಿತು.
ದುರಂತವೆಂದರೆ ಇಂತೆಲ್ಲ ಮಹತ್ವದ ಜ್ಞಾನ ಮತ್ತು ಐತಿಹಾಸಿಕ ಬೆಳವಣಿಗೆ ಮಯ ಹಿನ್ನೆಲೆಯನ್ನು ಈ ದೇಶದ ಪಟ್ಟಭದ್ರ ಹಿತಾಸಕ್ತಿಗಳು ಜನಸಾಮಾನ್ಯರಿಗೆ ತಲುಪಲು ಬಿಟ್ಟಿಲ್ಲ. ಮತ್ತೊಂದು ವಾಸ್ತವವೆಂದರೆ ಭಾರತದ ಪ್ರಕಾಶನ ಸಂಸ್ಥೆಗಳ, ಪುಸ್ತಕ ಮಳಿಗೆಗಳ ಇಂತಹ ಧೋರಣೆ ಕೊನೆಗಾಣ ಸಲು1980ರ ಸಮಯದಲ್ಲಿ ಮಹಾರಾಷ್ಟ್ರದಲ್ಲಿ ಅಲ್ಲಿನ ಅಂಬೇಡ್ಕರರ ಅನುಯಾಯಿಗಳ ಒತ್ತಾಯದ ಫಲವಾಗಿ ಸರ್ಕಾರ ಸಂಪೂರ್ಣ ಇಂಗ್ಲಿಷ್ ಭಾಷೆಯಲ್ಲಿದ್ದ ಡಾ.ಅಂಬೇಡ್ಕರ್ ಬರಹಗಳು ಮತ್ತು ಭಾಷಣಗಳನ್ನು ಸಂಪುಟಗಳ ರೂಪದಲ್ಲಿ ಪ್ರಕಟಿಸಲು ಆರಂಭಿಸಿತು.
ಮಹಾರಾಷ್ಟ್ರದ ಈ ಯೋಜನೆಗೆ ಕೈಗೂಡಿಸಿದ ಇತರೆ ರಾಜ್ಯಗಳು ತಮ್ಮ ತಮ್ಮ ಭಾಷೆಗಳಲ್ಲಿ ಅವುಗಳನ್ನು ಅನುವಾದಿಸಿ ಪ್ರಕಟಿಸಿದವು. ಈ ನಡುವೆ ಬಾಬಾಸಾಹೇಬ್ ಅಂಬೇಡ್ಕರರ ಇಂಗ್ಲಿಷ್ ಬರಹಗಳಿಗೆ ಈ ಮಟ್ಟಿಗಿನ ರಾಷ್ಟ್ರವ್ಯಾಪಿ ಬೇಡಿಕೆ ಮತ್ತು ದಲಿತ ಸಂಘಟನೆಗಳಿಂದ ಒತ್ತಾಯ ಬಂದ ಹಿನ್ನೆಲೆಯಲ್ಲಿ 2004ರಲ್ಲಿ ಯುಪಿಎ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವೆಯಾದ ಕುಮಾರಿ ಶೆಲ್ಜಾರವರ ಒತ್ತಾಸೆಯ ಮೇರೆಗೆ ಮಹಾರಾಷ್ಟ್ರದ ಯೋಜನೆಯನ್ನು ಕೇಂದ್ರ ಸರ್ಕಾರ ಮುಂದುವರಿಸಿ ಅಂಬೇಡ್ಕರರ ಪುಸ್ತಕಗಳು ಎಲ್ಲೆಡೆ ದೊರೆಯಲಿಕ್ಕೆ ಕಾರಣವಾಯಿತು.
ಹಾಗೆಯೇ ಯುಪಿಎ ಸರ್ಕಾರ ಡಾ.ಅಂಬೇಡ್ಕರರ ಈ ಎಲ್ಲಾ ಬರಹಗಳ ಸಂಪುಟಗಳನ್ನು ಪಿಡಿಎಫ್ ಮೂಲಕ ಅಂತರ್ಜಾಲದಲ್ಲೂ ಪ್ರಕಟಿಸಿದೆ. ಆಸಕ್ತರು ಯಾರೂ ಬೇಕಾದರೂ ಅವುಗಳನ್ನು ಡೌನ್‌ಲೋಡ್ ಮಾಡಿಕೊಂಡು ಓದಬಹುದು. ಆದರೆ ಪ್ರಶ್ನೆಯೇನೆಂದರೆ ಭಾರತದ ಪುಸ್ತಕ ಮಳಿಗೆಗಳಲ್ಲಿ ಅಂಬೇಡ್ಕರರ ಈ ಪುಸ್ತಕಗಳ ಲಭ್ಯತೆ?
ಹಾಗಿದ್ದರೆ ಮಹಾರಾಷ್ಟ್ರ ಸರ್ಕಾರ ಪ್ರಕಟಿಸುವ ಮೊದಲು ಅವುಗಳು ಲಭ್ಯವಿರಲಿಲ್ಲವೆಂದೇ? ಪ್ರಕಟವಾಗಿರಲಿಲ್ಲವೆಂದೇ? ಅದಕ್ಕಾಗಿ ಪ್ರಕಾಶನ ಸಂಸ್ಥೆಗಳಿಗೆ ಈ ಕಾರ್ಯ ಸಾಧ್ಯವಾಗಲಿಲ್ಲವೆಂದೇ? ಹಾಗೇನಿಲ್ಲ, ಲಭ್ಯವಿತ್ತು, ಪ್ರಕಟವಾಗಿತ್ತು. ಬಾಬಾಸಾಹೇಬ್ ಅಂಬೇಡ್ಕರರ ಸಹಪಾಠಿ ವಾಲ್ಮೀಕಿ ಭಂಗಿ ಸಮುದಾಯದದಿ.ಭಗವಾನ್‌ದಾಸ್‌ರವರು1960, 70 ರ ಹೊತ್ತಿಗೆ “ದಸ್ ಸ್ಪೋಕ್ ಅಂಬೇಡ್ಕರ್ (ಅಂಬೇಡ್ಕರ್ ಹೀಗೆ ಹೇಳಿದರು)” ಹೆಸರಿನಲ್ಲಿ ಸ್ವಂತ ಖರ್ಚು ಮತ್ತು ಶ್ರಮದ ಮೂಲಕ ಸರಣ ರೂಪದಲ್ಲಿ ಪ್ರಕಟಿಸಿದರು.
ಹಾಗಿದ್ದರೂ ಭಾರತದ ಪುಸ್ತಕ ಮಳಿಗೆಗಳು ಅಂಬೇಡ್ಕರರ ಆ ಸಂಪುಟಗಳತ್ತ ಕಣ್ಣೆತ್ತಿಯೂ ನೋಡಲಿಲ್ಲ ಅಥವಾ ತಮ್ಮ ಮಳಿಗೆಗಳ ಮೂಲಕ ಮಾರಾಟ ಮಾಡಲು ಮುಂದೆ ಬರಲಿಲ್ಲ. ಯಾಕೆ ಹೀಗೆ? ಈ ಲೇಖನದ ಆರಂಭದಲ್ಲೇ ಪ್ರಸ್ತಾಪಿಸಿರುವ ಹಾಗೆ “ಕೆಲವು ದುಷ್ಟ ಶಕ್ತಿಗಳು”. ಹೌದು, ಕೆಲವು ದುಷ್ಟ ಶಕ್ತಿಗಳು, ಅಸ್ಪೃಶ್ಯತಾಚರಣೆಯ ಮನಸ್ಥಿತಿ ಹೊಂದಿರುವ ದುಷ್ಟ ಶಕ್ತಿಗಳು ಅವು. ಸಂವಿಧಾನ ವಿರೋಧಿ ಶಕ್ತಿಗಳು ಎಂದು ಕೂಡ ಹೇಳಬಹುದು.
ಯಾಕೆಂದರೆ ಸಂವಿಧಾನದ ಅನುಚ್ಛೇದ 19 “ಅಭಿವ್ಯಕ್ತಿ ಸ್ವಾತಂತ್ರ‍್ಯ” ನೀಡುತ್ತದೆ. ಆದರೆ ಇಲ್ಲಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರರ ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ತಡೆಯೊಡ್ಡಲಾಗಿದೆ. ಯಾವ ಮಟ್ಟಿಗೆ ಎಂದರೆ ಈಗಲೂ ವಯಕ್ತಿಕವಾಗಿ ಬಹುತೇಕರು ನನ್ನನ್ನು “ಸರ್, ಅಂಬೇಡ್ಕರರ ಬರಹಗಳ ಭಾಷಣಗಳ ಇಂಗ್ಲಿಷ್ ಸಂಪುಟಗಳು ಎಲ್ಲಿ ಸಿಗುತ್ತವೆ?” ಎಂದರೆ ನನಗೆ ಭಾರತದ ಯಾವ ಪುಸ್ತಕ ಮಳಿಗೆಗಳಲ್ಲಿ ಸಿಗುತ್ತದೆ ಎಂದು ಹೇಳಲಿಕ್ಕೆ ಖಂಡಿತ ಸಾಧ್ಯವಾಗುವುದಿಲ್ಲ. ಆ ಮಟ್ಟಿಗೆ ಅಂಬೇಡ್ಕರರ ಅಭಿವ್ಯಕ್ತಿ ಸ್ವಾತಂತ್ರ‍್ಯ ಅಸ್ಪೃಶ್ಯತಾಚರಣೆ ಮೂಲಕ ದಮನವಾಗಿದೆ.
ಅಂದಹಾಗೆ ಇದಕ್ಕೆ ಯಾರನ್ನು ದೂರುವುದು? ಯಾರು ಹೊಣೆ?
ಉತ್ತರ: ಈ ದೇಶದ ಹಿಂದುತ್ವವಾದಿ, ಜಾತಿವಾದಿ, ಮನುವಾದಿ ಮನಸ್ಸುಗಳು ಎಂದು ನೇರ ಹೇಳದೆ ವಿಧಿಯಿಲ್ಲ. ಪ್ರಶ್ನೆ ಏನೆಂದರೆ ಮುಂದಾದರೂ ಇಂತಹ ಪರಿಸ್ಥಿತಿ ತೊಲಗುವುದೇ? ಅಂಬೇಡ್ಕರರ ಬರಹಗಳು ಎಲ್ಲರಿಗೂ ಧಕ್ಕುವುದೇ, ಈ ದೇಶದ ಜನಸಾಮಾನ್ಯರ ಜ್ಞಾನ ದಾಹ ಹಿಂಗಿಸುವುದೇ? ಕಾದು ನೋಡಬೇಕಷ್ಟೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್‌ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್‌ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್‌ನ ಎಸ್‌ಎನ್‌ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್ ಅಪಾರ್ಟ್‌ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

-
ದಿನದ ಸುದ್ದಿ2 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ2 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ2 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ2 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ2 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ2 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ3 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ2 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್


