ಬಹಿರಂಗ
ಖುಷಿ ಇದೆ ನಂಗೆ, ನಾನು ಇಂಥ ದೇಶ’ಭಕ್ತ’ ನಲ್ಲ : ಡಾ. ಬಿ.ಆರ್.ಅಂಬೇಡ್ಕರ್
ಇಂಡಿಯಾ ಒಂದು ವಿಶಿಷ್ಟ ದೇಶ. ಇಲ್ಲಿಯ ರಾಷ್ಟ್ರೀಯವಾದಿ, ದೇಶಭಕ್ತರೂ ಒಂದು ನಮೂನಿ ಜೀವಿಗಳೇ ಸರಿ. ಈ ದೇಶದ ಒಬ್ಬ ರಾಷ್ಟ್ರೀಯವಾದಿ ಹಾಗೂ ದೇಶಭಕ್ತ ಇಲ್ಲಿ ತನ್ನಂತೆಯೇ ಇರುವ ಜನರನ್ನು ಕೀಳಾಗಿ ನಡೆಸಿಕೊಳ್ಳುತ್ತಿರುವುದನ್ನು ಬಿಟ್ಟ ಕಣ್ಣುಗಳಿಂದ ನೋಡಬಲ್ಲ. ಆದರೆ, ಹಾಗೆ ಮಾಡುವುದು ತಪ್ಪು ಎಂದು ಅವನೊಳಗಿನ ಮಾನವೀಯತೆ ಪ್ರತಿಭಟಿಸುವುದೇ ಇಲ್ಲ.
ಅವನಿಗೆ ಗೊತ್ತು ಈ ನೆಲದಲ್ಲಿ ವಿನಾಕಾರಣ ಹಲವರಿಗೆ, ಮುಖ್ಯವಾಗಿ ಮಹಿಳೆಯರಿಗೆ ಹಕ್ಕುಗಳನ್ನು ನಿರಾಕರಿಸಲಾಗಿದೆ. ಆದರೆ, ಈ ಬಗ್ಗೆ ಏನಾದರೂ ಮಾಡಬೇಕೆಂದು ಆತನ ನಾಗರಿಕ ಪ್ರಜ್ಞೆಗೆ ಅನ್ನಿಸುವುದೇ ಇಲ್ಲ. ಸಾರ್ವಜನಿಕ ಉದ್ಯೋಗ ಅವಕಾಶಗಳಿಂದ ಒಂದು ವರ್ಗ ಸಂಪೂರ್ಣವಾಗಿ ಹೊರಗುಳಿದಿದೆ ಎಂದು ಅವನಿಗೆ ಗೊತ್ತು. ಆದರೆ ಆ ಕಟು ವಾಸ್ತವ, ಆತನಲ್ಲಿನ ನ್ಯಾಯಪರ ಪ್ರಜ್ಞೆಯನ್ನು ಎಚ್ಚರಿಸುವುದಿಲ್ಲ.
ವ್ಯಕ್ತಿ ಹಾಗೂ ಸಮಾಜಕ್ಕೆ ನೋವುಂಟು ಮಾಡಬಲ್ಲ ನೂರಾರು ಪದ್ಧತಿಗಳಲ್ಲಿ ಈ ದೇಶಭಕ್ತ ಅನುಸರಿಸುತ್ತಾನೆ. ಅಂತಹ ಆಚರಣೆಗಳು ಅವನಲ್ಲಿ ಅಸಹ್ಯ ಹುಟ್ಟಿಸುವುದೇ ಇಲ್ಲ. ಹಾಗೂ ಅವನ ಏಕೈಕ ಒತ್ತಾಯ ಅಧಿಕಾರ – ತನಗೆ ಹಾಗೂ ತನ್ನವರಿಗೆ.
ನನಗೆ ಖುಷಿ ಇದೆ, ಅಂತಹ ದೇಶಭಕ್ತರ ಪೈಕಿ ನಾನಿಲ್ಲ. ಪ್ರಜಾಪ್ರಭುತ್ವದ ಮೌಲ್ಯಗಳ ಆಧಾರದ ಮೇಲೆ ತನ್ನ ನಿಲುವು ತಾಳುವ ಹಾಗೂ ಎಲ್ಲಾ ತೆರನ ಏಕಾಧಿಪತ್ಯವನ್ನು ನಿರ್ನಾಮ ಮಾಡಲು ಬಯಸುವ ವರ್ಗಕ್ಕೆ ಸೇರಿದವನು ನಾನು. ರಾಜಕೀಯವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಎಲ್ಲರೂ ಸಮಾನರು ಎಂಬ ಆದರ್ಶವನ್ನು ಜಾರಿಗೆ ತರುವುದೇ ನಮ್ಮ ಗುರಿ.
– ಡಾ. ಬಿ.ಆರ್. ಅಂಬೇಡ್ಕರ್
(ಕನ್ನಡಕ್ಕೆ Sathish GT)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್ಎನ್ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್ಎಸ್ಆರ್ ಲೇಔಟ್ನಲ್ಲಿರುವ ತನ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್ಎನ್ಎನ್ ಅಪಾರ್ಟ್ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.



