ನೆಲದನಿ
ಮಹಾಡ್: ದಲಿತರ ಚಾರಿತ್ರಿಕ ದಂಗೆಯ ಕಥನ
- ನಟರಾಜ್ ಹುಳಿಯಾರ್
ಈ ಕಾಲದ ಮುಖ್ಯ ಚಿಂತಕರಲ್ಲೊಬ್ಬರಾದ ಆನಂದ್ ತೇಲ್ ತುಂಬ್ಡೆ ನಾಲ್ಕೈದು ವರ್ಷಗಳಿಂದ ಬರೆಯುತ್ತಿದ್ದ ‘ಮಹಾಡ್: ದಿ ಮೇಕಿಂಗ್ ಆಫ್ ದಿ ಫಸ್ಟ್ ದಲಿತ್ ರಿವೋಲ್ಟ್’ (ಆಕಾರ್ ಬುಕ್ಸ್, ನವದೆಹಲಿ) ಪುಸ್ತಕ ಮೊನ್ನೆ ಬಂದಿದೆ. ‘ಇಂಡಿಯಾದ ದಲಿತ ಚಳವಳಿಯ ಜಾನಪದವೇ ಆಗಿಹೋಗಿರುವ’ 20 ಮಾರ್ಚ್ 1927ರ ಮಹಾಡ್ ಸಮ್ಮೇಳನವನ್ನು ಆನಂದ್ ‘ಜಗತ್ತಿನ ಮೊದಲ ಮುಖ್ಯ ನಾಗರಿಕ ಹಕ್ಕುಗಳ ಹೋರಾಟಗಳಲ್ಲಿ ಒಂದು’ ಎನ್ನುತ್ತಾರೆ.
ಆನಂತರ 25 ಡಿಸೆಂಬರ್ 1927ರಂದು ಬೃಹತ್ ಮಹಾಡ್ ಸತ್ಯಾಗ್ರಹವನ್ನು ಏರ್ಪಡಿಸಿದ ಅಂಬೇಡ್ಕರ್ ಅಲ್ಲಿ ಮನುಸ್ಮೃತಿಯನ್ನು ಸುಟ್ಟರು. ಈ ಎರಡು ಚಾರಿತ್ರಿಕ ಸಮ್ಮೇಳನಗಳನ್ನು ಕುರಿತು ಮರಾಠಿಯಲ್ಲಿರುವ ಅನೇಕ ದಾಖಲೆಗಳು, ವಸಾಹತು ಆಡಳಿತದ ಟಿಪ್ಪಣಿಗಳು, ಅಂಬೇಡ್ಕರರ ‘ಬಹಿಷ್ಕೃತ ಭಾರತ’ ಪತ್ರಿಕೆಯ ಸಂಪಾದಕೀಯಗಳನ್ನು ಆನಂದ್ ಮಂಡಿಸಿದ್ದಾರೆ; ಆಳವಾಗಿ ವಿಶ್ಲೇಷಿಸಿದ್ದಾರೆ.
ಮೊದಲ ಮಹಾಡ್ ಸಮ್ಮೇಳನದ ಮುಂಚೂಣಿ ಸಂಘಟಕರಾದ ರಾಮಚಂದ್ರ ಬಾಬಾಜಿ ಮೋರೆಯವರ ನಿರೂಪಣೆಯೂ ಇಲ್ಲಿದೆ. ಕೊಂಚ ಅನುಕೂಲಸ್ಥ ಮನೆತನದಿಂದ ಬಂದ ಬಾಲಕ ಮೋರೆ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ. ಪ್ರೈಮರಿ ವಿದ್ಯಾಭ್ಯಾಸ ಮುಗಿಸಿ ಸ್ಕಾಲರ್‌ಶಿಪ್ ಪಡೆದಿದ್ದರೂ ಮಹರ್ ಎಂಬ ಕಾರಣಕ್ಕೆ ಅವನನ್ನು ಮಹಾಡ್ ಹೈಸ್ಕೂಲಿಗೆ ಸೇರಿಸಿಕೊಳ್ಳಲಿಲ್ಲ.
ಹನ್ನೊಂದರ ಹರೆಯದ ಮೋರೆ ಈ ಅನ್ಯಾಯದ ವಿರುದ್ಧ ಸರ್ಕಾರಕ್ಕೆ ಬಹಿರಂಗ ಪತ್ರವೊಂದನ್ನು ಬರೆದು ದಿನಪತ್ರಿಕೆಯೊಂದರಲ್ಲಿ ಪ್ರಕಟಿಸಿದ. ಸರ್ಕಾರದ ಅನುದಾನ ಕಳೆದುಕೊಂಡೇವೆಂಬ ಭಯಕ್ಕೆ ಸ್ಕೂಲಿನವರು ಮೋರೆಯನ್ನು ಸೇರಿಸಿಕೊಂಡರೂ ಅವನನ್ನು ತರಗತಿಯ ಹೊರಗೆ ಕೂರಿಸುತ್ತಿದ್ದರು. ಮುಂದೆ ಇಂಥ ಅವಮಾನಗಳ ವಿರುದ್ಧ ಬಂಡೆದ್ದ ತರುಣ ಮೋರೆ ದಲಿತ ಸಮುದಾಯವನ್ನು ಎಚ್ಚರಿಸುತ್ತಾ, ಅವರಿಗೆ ಆಗುತ್ತಿದ್ದ ಅವಮಾನಗಳ ವಿರುದ್ಧ ಹೋರಾಡತೊಡಗಿದರು.
ಆ ಹೊತ್ತಿಗಾಗಲೇ ಲಂಡನ್ ಹಾಗೂ ಕೊಲಂಬಿಯಾದಿಂದ ಎರಡು ಡಾಕ್ಟರೇಟ್ ಹಾಗೂ ಬಾರ್ ಅಟ್ ಲಾ ಪದವಿ ಪಡೆದು ಹಿಂದಿರುಗಿದ್ದ ಅಂಬೇಡ್ಕರ್ ಸಾಧನೆಯ ಬಗ್ಗೆ ಮೋರೆಗೆ ಅಪಾರ ಹೆಮ್ಮೆ ಹಾಗೂ ಗೌರವವಿತ್ತು. ಅಂಬೇಡ್ಕರರನ್ನು ಮಹಾಡ್‌ಗೆ ಕರೆಸಿ ಸನ್ಮಾನ ಮಾಡಿ, ದಲಿತ ಮಕ್ಕಳು ಅವರಂತೆ ಸಾಧನೆ ಮಾಡಲು ಸ್ಫೂರ್ತಿ ತುಂಬಬೇಕು; ದಲಿತರನ್ನು ಹೀನಾಯವಾಗಿ ಕಾಣುವ ಸವರ್ಣೀಯರು ಅಂಬೇಡ್ಕರ್ ಸಾಧನೆ ಕಂಡು ನಾಚಿಕೊಳ್ಳುವಂತೆ ಮಾಡಬೇಕು ಎಂಬ ಆಸೆಯಿಂದ ಅಂಬೇಡ್ಕರರನ್ನು ಕಂಡ ಮೋರೆ ಮಹಾಡಿನಲ್ಲಿ ದಲಿತ ಸಮ್ಮೇಳನದ ಅಧ್ಯಕ್ಷತೆ ವಹಿಸುವಂತೆ ಕೋರುತ್ತಾರೆ.
ತರುಣ ಮೋರೆಯ ಉತ್ಸಾಹ ಕಂಡ ಅಂಬೇಡ್ಕರ್ ಕೆಲವು ತಿಂಗಳ ನಂತರ ಮಹಾಡ್‌ನ ‘ಡಿಪ್ರೆಸ್ಡ್ ಕ್ಲಾಸಸ್ ಕಾನ್ಫರೆನ್ಸ್’ ಸಿದ್ಧತೆಗಳನ್ನು ಪರಿಶೀಲಿಸಲು ತಮ್ಮ ಸಂಗಾತಿಗಳನ್ನು ಕಳಿಸುತ್ತಾರೆ. ಮುಂಬೈಯಲ್ಲಿಯೂ ಈ ಕುರಿತ ಸಭೆಗಳು ನಡೆಯುತ್ತವೆ. ಅಂಬೇಡ್ಕರ್ ಸಮ್ಮೇಳನಾಧ್ಯಕ್ಷರ ಭಾಷಣವನ್ನು ತರುಣ ಸಿ.ಬಿ. ಖೈರ್ಮೋಡೆಯವರಿಗೆ ಹೇಳಿ ಬರೆಸತೊಡಗುತ್ತಾರೆ (ಖೈರ್ಮೋಡೆ ಮುಂದೆ ಮರಾಠಿಯಲ್ಲಿ ಅಂಬೇಡ್ಕರ್ ಜೀವನಚರಿತ್ರೆಯ 12 ಸಂಪುಟಗಳನ್ನು ಬರೆದರು. ಮೊದಲ ಸಂಪುಟವನ್ನು ಅಂಬೇಡ್ಕರ್ ನೋಡಿದ್ದರು).
ಈ ಸಮ್ಮೇಳನ ನಡೆಸಲು ತಕ್ಕ ಜಾಗವೇ ಸಿಗದೆ, ಕೊನೆಗೂ ತಮಾಷಾ ನಾಟಕ ನಡೆಸುವ ಸ್ಥಳವೊಂದು ಸಿಕ್ಕುತ್ತದೆ. 1927ರ ಮಾರ್ಚ್ 19ರ ಹೊತ್ತಿಗೆ ಮಹಾರಾಷ್ಟ್ರದ ಅನೇಕ ದಿಕ್ಕುಗಳಿಂದ ತಮ್ಮ ಜಾತಿಯ ಸಂಕೇತವಾದ ಲಾಠಿ ಹಿಡಿದು ಮಹರ್ ಸಮುದಾಯದವರು ಅಲ್ಲಿ ಸೇರುತ್ತಾರೆ. ಅಂಬೇಡ್ಕರ್ ತಮ್ಮ ಭಾಷಣದಲ್ಲಿ ಆ ಸುತ್ತಲಿನ ಅಸ್ಪೃಶ್ಯ ಸಮುದಾಯದವರು 19ನೆಯ ಶತಮಾನದಲ್ಲಿ ಮಿಲಿಟರಿ ಸೇರಿ ಉತ್ತಮ ಸ್ಥಿತಿಯಲ್ಲಿದ್ದುದನ್ನು, ಅವರ ಮಕ್ಕಳು ಮಿಲಿಟರಿ ಶಾಲೆಗಳಲ್ಲಿ ಕಲಿತು ವಿದ್ಯಾವಂತರಾಗುತ್ತಿದ್ದ ಕಾಲವನ್ನು ನೆನೆಸಿಕೊಳ್ಳುತ್ತಾರೆ.
ನಂತರ ಕೆಲವರ ಚಿತಾವಣೆಯಿಂದಾಗಿ ಮಿಲಿಟರಿ ಸೇವೆಯ ಬಾಗಿಲು ಮುಚ್ಚಿ, ದಲಿತರ ಪ್ರಗತಿ ಕುಸಿಯಿತು; ಆದ್ದರಿಂದ ಸರ್ಕಾರಿ ಸೇವೆಗೆ ತಕ್ಕ ಶಿಕ್ಷಣ ಹಾಗೂ ಕೃಷಿ ಎರಡನ್ನೂ ದಲಿತರು ಯುದ್ಧೋಪಾದಿಯಲ್ಲಿ ಕೈಗೆತ್ತಿಕೊಳ್ಳಬೇಕೆಂದು ಅಂಬೇಡ್ಕರ್ ಹೇಳುತ್ತಾರೆ. ಆನಂತರ ದಲಿತರನ್ನು ಬೆಂಬಲಿಸಿ ಮಾತಾಡಿದ ಸವರ್ಣೀಯ ಹಿಂದೂ ನಾಯಕ ಶೇಟ್ ‘ಮಹಾಡ್ ಮುನಿಸಿಪಾಲಿಟಿ ಈಚೆಗೆ ಚವ್ದಾರ್ (ಸಿಹಿನೀರು) ಕೆರೆಯ ನೀರನ್ನು ಅಸ್ಪೃಶ್ಯರೂ ಸೇರಿದಂತೆ ಎಲ್ಲರೂ ಬಳಸಿಕೊಳ್ಳಬಹುದು ಎಂಬ ನಿರ್ಣಯ ಮಾಡಿದೆ’ ಎಂಬುದನ್ನು ಸಭೆಯ ಗಮನಕ್ಕೆ ತರುತ್ತಾರೆ.
ಮಾರನೆಯ ದಿನ ಸಮ್ಮೇಳನದ ಬೆಂಬಲಿಗರಾದ ಟಿಪ್ನಿಸ್ ಮನೆಯಲ್ಲಿ ಅಂಬೇಡ್ಕರ್ ಮತ್ತು ಸಂಗಾತಿಗಳು ಈ ಕುರಿತು ಮಾತಾಡುತ್ತಿರುವಾಗ, ಅವತ್ತಿನ ಸಮಾವೇಶದ ನಂತರ ಎಲ್ಲರೂ ಚವ್ದಾರ್ ಕೆರೆಗೆ ಹೋಗಿ ಮುನಿಸಿಪಾಲಿಟಿ ನಿರ್ಣಯವನ್ನು ಜಾರಿಗೆ ತರಲು ತೀರ್ಮಾನಿಸಿದರು. ಸಮಾವೇಶದ ಕೊನೆಯಲ್ಲಿ ಸಂಘಟಕರಾದ ಭಾಯಿಚಿತ್ರೆ ಮುನಿಸಿಪಾಲಿಟಿಯ ನಿರ್ಣಯದಂತೆ ಚವ್ದಾರ್ ಕೆರೆಯ ನೀರನ್ನು ಕುಡಿಯಲು ಸಮ್ಮೇಳನಾಧ್ಯಕ್ಷರೊಂದಿಗೆ ಎಲ್ಲರೂ ಕೆರೆಯತ್ತ ನಡೆಯಬೇಕೆಂದು ಇದ್ದಕ್ಕಿದ್ದಂತೆ ಘೋಷಿಸಿದಾಗ ಸಭೆ ರೋಮಾಂಚನಗೊಂಡಿತು.
ಅಲ್ಲಿದ್ದ ಜನಸಮುದಾಯದ ಜೊತೆ ಚವ್ದಾರ್ ಕೆರೆಯತ್ತ ಹೆಜ್ಜೆ ಹಾಕಿದ ಅಂಬೇಡ್ಕರ್ ಬೊಗಸೆಯಲ್ಲಿ ಕೆರೆಯ ಸಿಹಿನೀರು ಕುಡಿದರು. ಸಾವಿರಾರು ವರ್ಷಗಳಿಂದ ಮಲೆತುಹೋಗಿದ್ದ ಇಂಡಿಯಾದ ಚರಿತ್ರೆ ಇದ್ದಕ್ಕಿದ್ದಂತೆ ಚಲಿಸಿತ್ತು. ಸಮಾವೇಶ ಮುಗಿಸಿ ಊರಿಗೆ ಹೊರಡುವ ಮುನ್ನ ಪ್ರತಿನಿಧಿಗಳು ಊಟ ಮಾಡತೊಡಗಿದರು. ಭದ್ರತೆಯ ಕಾರಣಕ್ಕಾಗಿ ಸರ್ಕಾರಿ ಪ್ರವಾಸಿ ಮಂದಿರದಲ್ಲಿದ್ದ ಅಂಬೇಡ್ಕರ್ ಮತ್ತಿತರರು ಅಲ್ಲಿಗೆ ಮರಳಿದರು.
ಎರಡು ಗಂಟೆಯ ಹೊತ್ತಿಗೆ ವೀರೇಶ್ವರ ದೇವಾಲಯದ ಪೂಜಾರಿ ‘ಅಸ್ಪೃಶ್ಯರು ದೇವಾಲಯ ಪ್ರವೇಶಿಸುತ್ತಿದ್ದಾರೆ; ಕಾಪಾಡಿ, ಕಾಪಾಡಿ’ ಎಂದು ಊರ ತುಂಬಾ ಕೂಗುತ್ತಾ ಓಡತೊಡಗಿದ. ಇನ್ನು ಕೆಲವರು ‘ಮಹರ್ ಜನ ಚವ್ದಾರ್ ಕೆರೆಯ ನೀರನ್ನು ಅಪವಿತ್ರಗೊಳಿಸಿ ನಿಮ್ಮ ದೇವಾಲಯಗಳಿಗೆ ಹೋಗಲು ತಯಾರಾಗುತ್ತಿದ್ದಾರೆ’ ಎಂದು ಕುಣಬಿ ಸಮುದಾಯದವರನ್ನು ರೊಚ್ಚಿಗೆಬ್ಬಿಸಿದರು.
ಸವರ್ಣೀಯರು ಲಾಠಿ ಹಿಡಿದು ವೀರೇಶ್ವರ ದೇವಸ್ಥಾನದ ಬಳಿ ಬಂದು ಸೇರಿದರು. ಈ ನಡುವೆ ತಮ್ಮನ್ನು ಕಂಡ ಪೊಲೀಸ್ ಅಧಿಕಾರಿಗೆ ಅಂಬೇಡ್ಕರ್ ತಮ್ಮವರಿಗೆ ದೇವಾಲಯ ಪ್ರವೇಶಿಸುವ ಇರಾದೆಯೇ ಇಲ್ಲ ಎಂದು ಹೇಳಿದರು. ಅತ್ತ ಊರಿಗೆ ಹೊರಟ ದಲಿತರ ಮೇಲೆ ಸವರ್ಣೀಯ ಗೂಂಡಾಗಳು ಹಲ್ಲೆ ಮಾಡಿದರು. ಸಮ್ಮೇಳನದ ಅಡುಗೆಮನೆಗೆ ನುಗ್ಗಿ ಅಲ್ಲಿದ್ದ ಹೆಂಗಸರು ಮಕ್ಕಳನ್ನೂ ಹೊಡೆದರು. ಗೂಂಡಾಗಳಿಂದ ತಪ್ಪಿಸಿಕೊಂಡು ಓಡುತ್ತಾ ಆಸರೆ ಬೇಡುತ್ತಿದ್ದ ದಲಿತರನ್ನು ಮೇಲುಜಾತಿಯ ಬಹುತೇಕರು ಮನೆಯೊಳಕ್ಕೆ ಬಿಟ್ಟುಕೊಳ್ಳಲಿಲ್ಲ.
ಮುಸಲ್ಮಾನರು ಅವರ ರಕ್ಷಣೆಗೆ ಬರದಿದ್ದರೆ ಅವರ ಸ್ಥಿತಿ ಇನ್ನಷ್ಟು ಚಿಂತಾಜನಕವಾಗಿರುತ್ತಿತ್ತು. ಮುಸಲ್ಮಾನರು ಮತ್ತು ಕಾಯಸ್ಥ ಜಾತಿಯವರು ಮಾತ್ರ ಅವರ ನೆರವಿಗೆ ಬಂದರು. ಜನರನ್ನು ಸಂತೈಸುತ್ತಾ, ‘ಏನೇ ಆಗಲಿ ಶಾಂತಿಯಿಂದ ಇರಿ’ ಎಂದು ಅಂಬೇಡ್ಕರ್ ಕೇಳಿಕೊಂಡರು. ಅಲ್ಲಿ ಸೇರಿದ್ದ, ಮಿಲಿಟರಿ ಸೇವೆಯಿಂದ ನಿವೃತ್ತರಾಗಿದ್ದ ದೃಢಕಾಯ ದಲಿತರಿಗೇನಾದರೂ ಅಂಬೇಡ್ಕರ್ ‘ಹೂಂ’ ಎಂದಿದ್ದರೆ ಕತೆಯೇ ಬೇರೆಯಾಗುತ್ತಿತ್ತು ಎಂದು ತೇಳ್‌ತುಂಬ್ಡೆ ಬರೆಯುತ್ತಾರೆ. ಆನಂತರ ಕೆರೆಯ ಸಿಹಿನೀರನ್ನು ಪುರೋಹಿತರು ಸಗಣಿ, ಗಂಜಲ ಹಾಕಿ ‘ಶುದ್ಧಿ’ ಮಾಡಿದ ಕತೆಯೂ ಕೆಲವು ಪುಸ್ತಕಗಳಲ್ಲಿದೆ.
ಮಹಾಡ್‌ನಲ್ಲಿ ದಲಿತರ ಮೇಲೆ ಹಲ್ಲೆ ಮಾಡಿದ ಕೆಲವರಿಗೆ ನಂತರ ಶಿಕ್ಷೆಯಾಯಿತು. ಅದೇ ವರ್ಷ ಡಿಸೆಂಬರ್ ತಿಂಗಳಲ್ಲಿ ಪೂರ್ಣ ಪ್ರಮಾಣದ ಮಹಾಡ್ ಸತ್ಯಾಗ್ರಹಕ್ಕಾಗಿ ಅಂಬೇಡ್ಕರ್ ವ್ಯಾಪಕ ಸಿದ್ಧತೆ ಶುರು ಮಾಡಿದರು. ಇದೆಲ್ಲದರ ಮಧ್ಯೆ, ತಾವೂ ಮಹಾಡ್ ಸತ್ಯಾಗ್ರಹವನ್ನು ಬೆಂಬಲಿಸುತ್ತೇವೆಂದು ಬಂದ ದಲಿತ ಸಾಧುಗಳು ಅಂಬೇಡ್ಕರ್ ‘ಅರೆ ರುದ್ರಾವತಾರಿ’ ಎಂದು ಪ್ರತಿಪಾದಿಸತೊಡಗಿದರು! ಇದನ್ನು ಕೇಳಿ ಮೊದಲು ನಕ್ಕ ಅಂಬೇಡ್ಕರ್, ನಂತರ ಗಂಭೀರವಾಗಿ ಹೇಳಿದರು: ‘ಇಂಥ ಕಲ್ಪನೆಗಳಿಂದಲೇ ಬ್ರಾಹ್ಮಣರು ಸಮಾಜವನ್ನು ನಾಶ ಮಾಡಿರುವುದು. ಇಂಥದ್ದನ್ನೆಲ್ಲಾ ಎಂದೂ ಸಮುದಾಯದಲ್ಲಿ ಹಬ್ಬಿಸಬಾರದು’.
ಈ ಸಮ್ಮೇಳನದ ಸಿದ್ಧತೆಗಳು ನಡೆಯುತ್ತಿರುವಾಗಲೇ ಮಹಾಡ್ ಮುನಿಸಿಪಾಲಿಟಿ ಚವ್ದಾರ್ ಕೆರೆಯ ನೀರನ್ನು ಎಲ್ಲರೂ ಬಳಸಬಹುದು ಎಂಬ ನಿರ್ಣಯವನ್ನು ವಾಪಸ್ ತೆಗೆದುಕೊಂಡಿತು. ದಲಿತರು ಈ ಕೆರೆಯ ನೀರನ್ನು ಬಳಸಬಾರದೆಂದು ಸವರ್ಣೀಯರು ಕೋರ್ಟಿನಿಂದ ತಡೆಯಾಜ್ಞೆ ತಂದರು; ಸಮ್ಮೇಳನಕ್ಕೆ ಜಾಗವೇ ಸಿಗದಂತೆ ಮಾಡಿದ್ದೇವೆಂದು ಗುಜಾರ್ ಬ್ರಾಹ್ಮಣರು ಹಿಗ್ಗಿನಲ್ಲಿದ್ದರು.
ಆದರೆ ಫತೇಹ್ ಖಾನ್ ಎಂಬಾತ ಸಂತೋಷದಿಂದ ಸಮ್ಮೇಳನಕ್ಕೆ ಜಾಗ ಕೊಟ್ಟ. ಗುಜಾರ್ ಬ್ರಾಹ್ಮಣರ ಒತ್ತಡಕ್ಕೆ ಫತೇಹ್ ಖಾನ್ ಮಣಿಯಲಿಲ್ಲ; ಅವನ ಹೊಲದಲ್ಲಿ ಹಾಕಿದ ದೊಡ್ಡ ಪೆಂಡಾಲಿನಲ್ಲಿ, 25 ಡಿಸೆಂಬರ್ 1927ರಂದು ಹತ್ತು ಸಾವಿರ ಪ್ರತಿನಿಧಿಗಳ ಸತ್ಯಾಗ್ರಹ ಸಮ್ಮೇಳನ ಶುರುವಾಯಿತು. ಕೆಲವು ದಲಿತೇತರ ನಾಯಕರೂ ಸಮ್ಮೇಳನದಲ್ಲಿ ಮಾತಾಡಿದರು.
ಅಂಬೇಡ್ಕರರ ಚಾರಿತ್ರಿಕ ಭಾಷಣದ ನಂತರ ಜಾತಿಪದ್ಧತಿಯ ಬೇರುಗಳಿಗೆ ಮಾರಣಾಂತಿಕ ಹೊಡೆತ ಕೊಡಲು ಮನುಸ್ಮೃತಿಯನ್ನು ಸುಡಲಾಯಿತು. ಚವ್ದಾರ್ ಕೆರೆಯ ನೀರನ್ನು ಬಳಸುವ ವಿಚಾರದಲ್ಲಿ ಮುಂದೊಮ್ಮೆ ಕಾನೂನಿನ ಸಮರವನ್ನು ಗೆಲ್ಲುವ ಛಲದಿಂದ ಅಂಬೇಡ್ಕರ್ ಸಾವಿರಾರು ಅನುಯಾಯಿಗಳೊಡನೆ ಮಹಾಡಿನ ಬೀದಿಗಳಲ್ಲಿ ಮೆರವಣಿಗೆ ಹೊರಟು ನಾಲ್ಕೂ ದಿಕ್ಕುಗಳಿಂದ ಕೆರೆಯ ಸುತ್ತ ಸೇರಿ ಕಾರ್ಯಕ್ರಮ ಮುಗಿಸಿದರು.
ಮರುದಿನ ಚಮ್ಮಾರರ ಸಭೆಗಳನ್ನು ಉದ್ದೇಶಿಸಿ ಅಂಬೇಡ್ಕರ್ ಮಾತಾಡಿದರು. ಈ ನಡುವೆ ಅಕ್ಕಪಕ್ಕದ ಊರುಗಳಿಂದ ಆತಂಕಗೊಂಡು ಮಹಾಡಿಗೆ ಓಡಿ ಬಂದ ಹೆಂಗಸರು ಬಾಬಾಸಾಹೇಬರನ್ನು ನೋಡಿ ನೆಮ್ಮದಿಗೊಂಡರು; ಕಾರಣ, ಅಂಬೇಡ್ಕರರ ಹತ್ಯೆಯಾಗಿದೆಯೆಂದು ಪುಕಾರು ಹಬ್ಬಿತ್ತು. ಮಹರ್ ಮಹಿಳೆಯರು ಬಟ್ಟೆ ತೊಡುವ ಕ್ರಮದಲ್ಲಿ ಇದ್ದ ಜಾತಿದೈನ್ಯತೆಯನ್ನು ಮೊದಲು ಬಿಡಬೇಕೆಂದು ಅಂಬೇಡ್ಕರ್ ಹೇಳಿದರು. ಸಮ್ಮೇಳನದ ನಂತರ ಊರಿಗೆ ಹೊರಟ ಮಹಿಳೆಯರು ತಮ್ಮ ಉಡುಪಿನ ಶೈಲಿಯನ್ನು ಬದಲಿಸಿಕೊಂಡಿದ್ದರು.
ಮಹಾಡ್ ಮುನಿಸಿಪಾಲಿಟಿಯ ಸ್ವೀಪರುಗಳು ತಮ್ಮ ಕೆಲಸಕ್ಕೆ ರಾಜಿನಾಮೆ ಕೊಟ್ಟಿದ್ದರು. ಮಹಾಡ್ ಸಮ್ಮೇಳನಗಳ ಅನುಭವ ಬಾಬಾಸಾಹೇಬರಿಗೆ ದಲಿತರ ಸಂಘಟನೆ-ಹೋರಾಟದ ಸಾಧ್ಯತೆಗಳ ಬಗ್ಗೆ ಅಪಾರ ಭರವಸೆ ಮೂಡಿಸಿತು. ಮಹಾಡ್ ತೋರಿದ ಹಕ್ಕಿನ ಪ್ರತಿಪಾದನೆಯ ಅರ್ಥಪೂರ್ಣತೆಯನ್ನು ಇವತ್ತಿಗೂ ದಲಿತ ಸಂಘಟನೆಗಳು ನೆನೆಯುತ್ತವೆ. ಅಂಬೇಡ್ಕರ್ ಬದುಕಿರುವವರೆಗೂ ಮನುಸ್ಮೃತಿ ಸುಟ್ಟ ದಿನವನ್ನು ಆಚರಿಸುತ್ತಿದ್ದರು.
ಮಹಾರಾಷ್ಟ್ರ ಹಾಗೂ ಇನ್ನಿತರ ಕಡೆಗಳಲ್ಲಿ ಈ ಆಚರಣೆ ಇವತ್ತಿಗೂ ಮುಂದುವರಿದಿದೆ. ಸ್ವಾತಂತ್ರ್ಯಾನಂತರ ಮಹಾಡ್ ಹೋರಾಟ ಚರಿತ್ರೆಗೆ ಸಂದಿದೆಯೆಂದು ಭಾವಿಸಲಾಗದು; ಕಳೆದ ವರ್ಷವಷ್ಟೇ ಚೆನ್ನರಾಯಪಟ್ಟಣದ ಕುರುವಂಕದಲ್ಲಿ ಕಲ್ಯಾಣಿಯೊಂದರ ನೀರು ಬಳಸಲು ದಲಿತರು ಹೋರಾಡಬೇಕಾಗಿ ಬಂದಿತ್ತು. ಆದ್ದರಿಂದಲೇ ಮಹಾಡ್ ಇವತ್ತಿಗೂ ದಲಿತರ ನಿರಂತರ ಹೋರಾಟದ ದಿಟ್ಟ ಸಂಕೇತದಂತಿದೆ.
ಕೊನೆ ಟಿಪ್ಪಣಿ: ಸಿಹಿನೀರಿಗಾಗಿ ಸುದೀರ್ಘ ಹೋರಾಟ
‘ಚವ್ದಾರ್ ಕೆರೆ ಸಾರ್ವಜನಿಕ ಕೆರೆಯಲ್ಲ; ಅದು ‘ಚೌಧರಿ’ ಎಂಬುವವರು ಕಟ್ಟಿಸಿದ ಖಾಸಗಿ ಕೆರೆ’ ಎಂದು ಸವರ್ಣೀಯರು ಸುಳ್ಳುವಾದ ಹೂಡಿ, ದಲಿತರು ಕೆರೆಯ ನೀರನ್ನು ಮುಟ್ಟದಂತೆ ಕೋರ್ಟಿನಿಂದ ತಡೆಯಾಜ್ಞೆತಂದಿದ್ದರು.
‘ಚವ್ದಾರ್ ಕೆರೆಯ ನೀರನ್ನು ಮುಟ್ಟಿ ನಾನು ಜೈಲಿಗೆ ಹೋಗಲು ಸಿದ್ಧ; ನಿಮ್ಮಲ್ಲಿ ಎಷ್ಟು ಜನ ಜೈಲಿಗೆ ಹೋಗಲು ಸಿದ್ಧರಿದ್ದೀರಿ, ಹೆಸರು ಕೊಡಿ’ ಎಂದು ಅಂಬೇಡ್ಕರ್ ಸತ್ಯಾಗ್ರಹ ಸಮ್ಮೇಳನದಲ್ಲಿ ಕೇಳಿದರು; ಹೆಸರು ಬರೆಸಿದವರ ಸಂಖ್ಯೆ ಮೂರು ಸಾವಿರ ದಾಟತೊಡಗಿತು; ಸಮ್ಮೇಳನದಲ್ಲಿದ್ದ ಬಹುತೇಕರು ಜೈಲಿಗೆ ಹೋಗಲು ಸಿದ್ಧರಿದ್ದರು.
ಸತ್ಯಾಗ್ರಹಕ್ಕೆ ಹೊರಡುವ ಕೆಲವು ಮಹರ್ ಗಂಡಸರು ತಮ್ಮ ಹೆಂಡತಿಯರ ಕುಂಕುಮವನ್ನು ಅಳಿಸಿ ಯುದ್ಧಭೂಮಿಗೆ ಹೊರಡುವಂತೆ ಮಹಾಡಿಗೆ ಬಂದಿದ್ದರು. ಅವರು ಹಿಂದೆ ಸರಿವ ಪ್ರಶ್ನೆಯೇ ಇರಲಿಲ್ಲ. ಮುಂದೆ ಕೋರ್ಟಿನಿಂದ ಕೋರ್ಟಿಗೆ ದಾಟಿದ ಈ ಕೇಸನ್ನು ಅಂಬೇಡ್ಕರ್ ಗೆದ್ದದ್ದು 1937ರಲ್ಲಿ. ಆದರೆ ಅಂಬೇಡ್ಕರ್ ಅಷ್ಟುಹೊತ್ತಿಗಾಗಲೇ ದಲಿತರನ್ನು ಬಹುದೂರ ಕರೆದೊಯ್ದಿದ್ದರು. ಜೊತೆಗೆ, ದಲಿತರ ಬಿಡುಗಡೆಗೆ ಕಾನೂನು ಹಾಗೂ ಹೋರಾಟಗಳೆರಡೂ ಮುಖ್ಯವೆಂಬುದನ್ನೂ ತೋರಿಸಿದ್ದರು.
ಕೃಪೆ: –ಪ್ರಜಾವಾಣಿಯ ‘ಕನ್ನಡಿ’ ಅಂಕಣದಲ್ಲಿ ಪ್ರಕಟಗೊಂಡಿದ್ದ ಬರಹ (ಮಾರ್ಚ್ 16, 2016)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ
ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.
ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ
ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.
ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.
‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.
‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.
ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ
ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.
ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ದಿನದ ಸುದ್ದಿ3 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ3 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ3 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ಅಂಕಣ2 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ2 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ2 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

