Connect with us

ದಿನದ ಸುದ್ದಿ

ಡಾ. ಎಂ.ಎಂ. ಕಲ್ಬುರ್ಗಿಯವರು ಮಾಡಿದ ತಪ್ಪಾದರೂ ಏನು..?

Published

on

  • ಆರ್.ರಾಮಕೃಷ್ಣ

ಗಸ್ಟ್, ಸೆಪ್ಟೆಂಬರ್ ತಿಂಗಳುಗಳು ಬಂದರೆ ವೈಚಾರಿಕತೆ, ವೈಜ್ಞಾನಿಕ ಮನೋಭಾವವನ್ನು ಪ್ರತಿಪಾದಿಸುವ ಮನಸ್ಸುಗಳಲ್ಲಿ ಒಂದು ಬಗೆಯ ವಿಷಾದಭಾವ ಆವರಿಸುತ್ತದೆ. ಈ ದಿನಗಳಲ್ಲಿ ಕೆಲವು ವ್ಯಕ್ತಿಗಳನ್ನು ನೆನಪಿಸಿಕೊಳ್ಳದೇ ಇರುವುದು ಸಾಧ್ಯವೇ ಇಲ್ಲ.

ಆಗಸ್ಟ್ 20, 2019 ರಂದು ಹತ್ಯೆಯಾದ ಮಹಾರಾಷ್ಟ್ರದ ಖ್ಯಾತ ವಿಚಾರವಾದಿ ಡಾ. ನರೇಂದ್ರ ದಾಬೋಲ್ಕರ್, ಖ್ಯಾತ ಬರಹಗಾರ, ಸಾಮಾಜಿಕ ಕಾರ್ಯಕರ್ತ ಗೋವಿಂದ ಪನ್ಸಾರೆ, ಆಗಸ್ಟ್ 30, 2015 ರಂದು ಹತ್ಯೆಯಾದ ನಮ್ಮಧೇ ಕರ್ನಾಟಕದ ಘನ ವಿದ್ವಾಂಸ ಡಾ. ಎಂ.ಎಂ. ಕಲ್ಬುರ್ಗಿ, ಸೆಪ್ಟೆಂಬರ್ 5, 2017 ರಂದು ಹತ್ಯೆಯಾದ ಕೋಮು ಸೌಹಾರ್ದ ಚಳುವಳಿಯ ಕಾರ್ಯಕರ್ತೆ, ಪತ್ರಕರ್ತೆ ಗೌರಿ ಲಂಕೇಶ್ ಇವರೇ ಈ ವ್ಯಕ್ತಿಗಳು.

ಈ ನಾಲ್ವರ ಹತ್ಯೆಗಳು ಬಹುತೇಕ ಒಂದೇ ರೀತಿಯಲ್ಲಿ ಆಗಿವೆ. ಸಂಚು ಮಾಡಿ, ಹೊಂಚುಹಾಕಿ ಈ ಚಿಂತಕರ, ಸಾಮಾಜಿಕ ಕಾರ್ಯಕರ್ತರ ದೇಹಗಳಿಗೆ ಗುಂಡು ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಎಲ್ಲ ಹತ್ಯೆಗಳೂ ಬಹುತೇಕ ಒಂದೇ ರೀತಿಯ ಕಾರಣಕ್ಕೇ ಆಗಿವೆ. ಇವರೆಲ್ಲರೂ ಸಮಾಜದಲ್ಲಿ ಬೇರೂರಿರುವ ಮೌಢ್ಯ, ಕಂದಾಚಾರ, ಜಾತಿತಾರತಮ್ಯ, ಅಸ್ಪೃಶ್ಯತೆಗಳನ್ನು ವಿರೋಧಿಸುತ್ತಿದ್ದರು. ಕೋಮುದ್ವೇಷವನ್ನು ನಿವಾರಿಸಿ ಸಮಾಜದಲ್ಲಿ ಸೌಹಾರ್ಧತೆಯನ್ನು ಸ್ಥಾಪಿಸಲು ಬಯಸಿದ್ದರು.

ಇತ್ತೀಚಿನ ವರ್ಷಗಳಲ್ಲಿ ನಮ್ಮ ಸಮಾಜದಲ್ಲಿ ವೈಚಾರಿಕತೆಯ ಮೇಲೆ, ಚಿಂತಕರು, ವಿಚಾರವಾದಿಗಳ ಮೇಲೆ ಹಲ್ಲೆಗಳು ಹೆಚ್ಚುತ್ತಿವೆ. ಅಸಹನೆ ತೀವ್ರವಾಗುತ್ತಿದೆ. ನಿರುದ್ಯೋಗ-ಬಡತನ ಮುಂತಾದ ಸಮಸ್ಯೆಗಳ ಕಾರಣದಿಂದ ಜನಸಾಮಾನ್ಯರಲ್ಲಿರುವ ಹೆಚ್ಚುತ್ತಿರುವ ಅತೃಪ್ತಿ, ಅಸಮಾಧಾನಗನ್ನು ಬಳಸಿಕೊಂಡು ಈ ಸಮಸ್ಯೆಗಳಿಗೆ ತಪ್ಪು ಕಾರಣಗಳನ್ನು ಮೂಲವೆಂದು ತೋರಿಸಿ ಅನ್ಯಮತ ದ್ವೇಷವನ್ನು ಪ್ರಚೋದಿಸಿ ಹಿಂಸಾಚಾರಕ್ಕೆ ಕುಮ್ಮಕ್ಕು ಕೊಡಲಾಗುತ್ತಿದೆ.

ಪ್ರಜಾಪ್ರಭುತ್ವದ ಮೂಲ ಅಡಿಪಾಯವಾದ ಮುಕ್ತ ಚಿಂತನೆ, ವೈಚಾರಿಕತೆಯ ಮೇಲೆ ಹಲ್ಲೆಗಳನ್ನು ಪ್ರಚೋದಿಸಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸೌಹಾರ್ದತೆ, ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸುವ ಚಿಂತಕರ ಹತ್ಯೆಗಳು ನಡೆದಿವೆ. ಈ ಮೇಲೆ ಹೇಳಲಾದ ಎಲ್ಲ ಹತ್ಯೆಗಳೂ ಇಂತಹ ವಿಕೃತ ಪ್ರಚೋಧನೆಯ ಪರಿಣಾಮವೇ ಆಗಿವೆ.

ಪತ್ರಿಕೆಗಳು, ದೂರದರ್ಶನ ಚಾನೆಲ್ ಮುಂತಾದವು ಸೇರಿದ ಸಮೂಹ ಮಾಧ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಕರೆಯಲಾಗುತ್ತದೆ. ನಮ್ಮ ದೇಶದ ಸುಧೀರ್ಘ ಸ್ವಾತಂತ್ರ್ಯ ಹೋರಾಟದಲ್ಲಿ ಬೆಳೆದು ಬಂದ ನಮ್ಮ ದೇಶದ ಪ್ರತ್ರಿಕಾ ರಂಗವು ದೇಶದಲ್ಲಿ ಸಾಮಾಜಿಕ ನ್ಯಾಯದ ಪ್ರತಿಪಾದನೆಯಲ್ಲಿ, ಮೌಢ್ಯ-ಕಂದಾಚಾರಗಳ ವಿರುದ್ಧ ವೈಜ್ಞಾನಿಕ ಮನೋಭಾವನ್ನು ಹರಡುವಲ್ಲಿ, ವೈಚಾರಿಕತೆಯನ್ನು ಬೆಳೆಸುವಲ್ಲಿ ಬಹಳ ಮಹತ್ವದ ಪಾತ್ರವನ್ನು ವಹಿಸುತ್ತಾ ಬಂದಿವೆ.

ಆದರೆ ಇತ್ತೀಚಿನ ವರ್ಷಗಳಲ್ಲಿ ಗಣನೀಯ ಭಾಗದ ಸಮೂಹ ಮಾಧ್ಯಮಗಳ ಧೋರಣೆಯಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗಮನಿಸಿದಲ್ಲಿ ಇದೇ ಮಾತನ್ನು ಹೇಳುವುದು ಸಾಧ್ಯವಿಲ್ಲ. ಇದೊಂದು ದುರದೃಷ್ಟಕರ ಬೆಳವಣಿಗೆ. ಡಾ. ಎಂ.ಎಂ. ಕಲ್ಬುರ್ಗಿಯವರ ಹತ್ಯೆಯಲ್ಲಿ ನಮ್ಮ ಪತಿಕಾ ಮಾಧ್ಯಮವು ಅತ್ಯಂತ ವೈಚಾರಿಕತೆಯನ್ನು, ಮಾಧ್ಯಮ ಪಾಲಿಸಲೇ ಬೇಕಾದ ನೈತಿಕತೆಯನ್ನು ಮರೆತು ಸುದ್ದಿ-ವಿಚಾರಗಳನ್ನು ತಪ್ಪು, ತಪ್ಪಾಗಿ, ವಿಕೃತವಾಗಿ ಬಿಂಬಿಸಿದ್ದು ಒಂದು ಕಾರಣ ಎಂದು ನಾವು ಬಹಳ ವಿಷಾದದಿಂದ ಗಮನಿಸಬೇಕಾಗಿದೆ.

ಕಲ್ಬುರ್ಗಿಯವರ ಹತ್ಯೆಗೆ ಕಾರಣವಾದ ಅಂಶಗಳನ್ನೇ ನಾವು ಒಮ್ಮೆ ಪರಿಶೀಲಿಸೋಣ. ಬೆಂಗಳೂರಿನ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಸಭಾಂಗಣದಲ್ಲಿ ಅಖಿಲ ಕರ್ನಾಟಕ ವಿಚಾರವಾದಿಗಳ ವೇದಿಕೆಯು ಸಂಘಟಿಸಿದ್ದ, ವೈಚಾರಿಕತೆಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಕಲ್ಬುರ್ಗಿಯವರು ಡಾ.ಯು.ಆರ್. ಅನಂತ ಮೂರ್ತಿಯವರ ಬರಹದಲ್ಲಿ ಪ್ರಸ್ತಾಪವಾಗಿರುವ ವಿಚಾರವೊಂದನ್ನು ಸಾಂದರ್ಭಿಕವಾಗಿ ಪ್ರಸ್ತಾಪಿಸಿದರು.

`ಬೆತ್ತಲೆ ಫೂಜೆ ಏಕೆ ಕೂಡದು’ ಎಂಬ ಅನಂತಮೂರ್ತಿಯವರ ಪುಸ್ತಕದಲ್ಲಿ `ನನ್ನನ್ನು ಬೆಳಸಿದ ಕರ್ನಾಟಕ’ ಎಂಬ ಲೇಖನವೊಂದಿದೆ. ಅದರಲ್ಲಿ ಸ್ವಾತಂತ್ರ್ಯಪೂರ್ವದ ಆ ಕಾಲಘಟ್ಟದಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಬೆಳೆದ ಆನಂತ ಮೂರ್ತಿಯವರು ತಮ್ಮ ಬಾಲ್ಯಕಾಲದ ಸಾಮಾಜಿಕ ಪರಿಸರವನ್ನು ವಿವರಿಸುತ್ತಾ, ದಟ್ಟ ಸಾಂಪ್ರದಾಯಿಕ ಸಮಾಜದಲ್ಲಿನ ಅನುಭವಗಳು, ಅಂತಹ ಸನ್ನಿವೇಶದಲ್ಲಿ ಶಿವರಾಮ ಕಾರಂತರ ಚೋಮನದುಡಿ, ಕುವೆಂಪು ಅವರ ಸಾಹಿತ್ಯ ಕೃತಿಗಳು, ತಂದೆಯವರು ತರಿಸುತ್ತಿದ್ದ ಮಹಾತ್ಮ ಗಾಂಧಿಯವರ ಸಂಪಾದಕತ್ವದ `ಹರಿಜನ’ ಪತ್ರಿಕೆಯ ಓದು, ಶಾಂತವೇರಿ ಗೋಪಾಲಗೌಡರ ವಿಚಾರಗಳು ಮುಂತಾದ ನಾನಾ ಪ್ರಭಾವಗಳಿಂದ ಹೊಸ ಚಿಂತನೆಗೆ ಮನಸ್ಸನ್ನು ತೆರೆದುಕೊಂಡದ್ದು, ಆ ಕಾಲಘಟ್ಟದಲ್ಲಿ ಹಲವು ಬಗೆಯ ಗೊಂದಲಗಳು ಅವರನ್ನು ಕಾಡಿದ್ದು ಎಲ್ಲವನ್ನು ವಿವರಿಸುತ್ತಾರೆ.

ಕರಾವಳಿಯಿಂದ ಬಂದ ಕಲಾವಿದರ ಯಕ್ಷಗಾನ, ತುಳುವರ ಕೋಲ ಇತ್ಯಾದಿಗಳ ಮೂಲಕ ಪುರಾಣ ಕಥಾನಕಗಳನ್ನು ನೋಡುತ್ತಾ, ಕೇಳುತ್ತಾ ಬೆಳೆಯುತ್ತಿದ್ದ ಕಾಲಘಟ್ಟದಲ್ಲಿ.., ಸುತ್ತ ಮುತ್ತಲ ಮರ, ಕಲ್ಲು, ನದಿ ಎಲ್ಲವೂ ಪವಿತ್ರ ಎಂಬಂತಹ ನಂಬಿಕೆಯಿದ್ದ ಪರಿಸರದಲ್ಲಿ…. ತಮ್ಮನ್ನು ತಾವು `ನಿರ್ ಪುರಾಣೀಕರಿಸಿಕೊಳ್ಳುವ’ ನಿಟ್ಟಿನಲ್ಲಿ, `ಏನಾದರೂ ತೀರಾ ಅಸಹಜವಾದದ್ದನೋ ಮಾಡಿ, ಕಲ್ಲು ಎನ್ನುವುದು ಬರಿ ಕಲ್ಲು- ಮರ ಎಂದರೆ ಮರ ಎಂದು ನನ್ನನ್ನು ನಾನು ನಂಬಿಸಿಕೊಳ್ಳುವುದು ಆಗಬೇಕಿತ್ತು’ ಅದಕ್ಕಾಗಿ, `ಜನರು ಬಹಳ ಪ್ರಭಾವಶಾಲಿ ಎಂದು ನಂಬುತ್ತಿದ್ದ ಮರದಡಿಯ ಭೂತದ ಕಲ್ಲೊಂದರ ಮೇಲೆ ಗುಟ್ಟಾಗಿ ಮೂತ್ರ ಮಾಡಿದೆ.’ ಎಂದು ಬರೆದುಕೊಂಡಿದ್ದಾರೆ. ಆನಂತರ `ಏನು ಶಿಕ್ಷೆ ಕಾದಿದೆಯೋ ಎಂದು ದಿಗಿಲಿನಲ್ಲೇ ಹಲವಾರು ದಿನಕಳೆದೆ’ ಎಂದೂ ಅವರು ಹೇಳಿಕೊಂಡಿದ್ದಾರೆ.

ತಮ್ಮ ಬಾಲ್ಯಕಾಲದಲ್ಲಿ, ಎಲ್ಲರಿಗೂ ಸಹಜವಾದ ಅಪಕ್ವ ಮನಸ್ಥಿತಿಯಲ್ಲಿ…, ಮನಸ್ಸು ವೈಚಾರಿಕತೆಗೆ ತೆರೆದುಕೊಳ್ಳುವ ಕಾಲಘಟ್ಟದಲ್ಲಿನ ಗೊಂದಲದ ಮನಸ್ಥಿತಿಯಲ್ಲಿ ತಾವು ಮಾಡಿದ ಕೆಲಸವೊಂದರ ಬಗೆಗೆ ಅನಂತಮೂರ್ತಿಯವರು ಹೇಳಿಕೊಂಡಿದ್ದಾರೆ. ಲೇಖನದಲ್ಲಿ ಅನಂತಮೂರ್ತಿಯವರು ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿಲ್ಲ. ಅವರು ಸಮರ್ಥಿಸಿಕೊಳ್ಳುವಂಥವರೂ ಅಲ್ಲ.

ಚಳುವಳಿಕಾರರು ತಮ್ಮ ಹಲವಾರು ಪ್ರತಿಭಟನೆಗಳನ್ನು ನಡೆಸುವಾಗ ಸಾಂಕೇತಿಕ ಪ್ರತಿಭಟನೆಯ ಭಾಗವಾಗಿ ಹಲವು ವ್ಯಕ್ತಿಗಳ `ಭೂತದಹನ’ ಮಾಡುವುದು ತುಂಬಾ ಸಾಮಾನ್ಯ. ಆದರೆ ಅನಂತ ಮೂರ್ತಿಯವರು ಇಂತಹ ಸಾಂಕೇತಿಕ ಭೂತದಹನವನ್ನು ಸಹ ವಿರೋಧಿಸುತ್ತಿದ್ದವರು ಎಂಬುದನ್ನು ನಾವು ಗಮನಿಸಬೇಕು. ಇನ್ನೂ ಜನಸಾಮಾನ್ಯರು ಭಕ್ತಿಯಿಂದ ಗೌರವಿಸುವ ದೇವರನ್ನು ಅಪಮಾನಿಸುವುದನ್ನ ಸಮರ್ಥಿಸುವರೇ ? ಸಾರ್ವಜನಿಕ ಸಮಾರಂಭದಲ್ಲಿ ಸಾಂದರ್ಭಿಕವಾಗಿ ಈ ವಿಚಾರವನ್ನು ಪ್ರಸ್ತಾಪಿಸಿದ ಕಲ್ಬುರ್ಗಿಯವರೂ ಸಹ ಅನಂತ ಮೂರ್ತಿಯವರ ಈ ಕೆಲಸವನ್ನು ಸಮರ್ಥಿಸಲಿಲ್ಲ ಎಂಬುದನ್ನು ಸಹ ಗಮನಿಸಬೇಕು.

ಆದರೆ ಕೆಲವು ಪತ್ರಿಕೆಗಳಲ್ಲಿ ಸಮಯ, ಸಂದರ್ಭದ ಯಾವ ಹಿನ್ನೆಲೆ ಮುನ್ನೆಲೆಯನ್ನು ಗಮನಕ್ಕೆ ತೆಗೆದುಕೊಳ್ಳದೇ, ಮಾತಿನ ಸರಿಯಾದ ಅರ್ಥವನ್ನು ಬಿಂಬಿಸದೇ, ಅನಂತಮೂರ್ತಿಯವರು ದೇವರ ಮೂರ್ತಿಯ ಮೇಲೆ ಮೂತ್ರ ಮಾಡಿದ್ದಾಗಿ ಬರೆದುಕೊಂಡಿದ್ದಾರೆ ಎಂಬಂತೆ ಮತ್ತು ಕಲ್ಬುರ್ಗಿಯವರು ಅದನ್ನು ಸಮರ್ಥಿಸಿ ಇಂಥ ಪ್ರಯೋಗ ನಡೆಸಲು ಕರೆ ನೀಡಿದ್ದಾರೆ ಎಂಬಂತೆ ಬಿಂಬಿಸಲಾಯಿತು. ಕಲ್ಬುರ್ಗಿಯವರಿಗೆ `ಹಿಂದೂ ವಿರೋಧಿ’ ಎಂಬ ಹಣೆಪಟ್ಟಿ ಹಚ್ಚಲಾಯಿತು.

ನಂತರ ನಡೆದ ದುರಂತ ಈಗ ಎಲ್ಲರಿಗೂ ತಿಳಿದದ್ದು. ಅನಂತ ಮೂರ್ತಿಯವರ ಬರಹ ವಿಚಾರವನ್ನು ನಾವು ಒಪ್ಪಬಹುದು ಅಥವಾ ಒಪ್ಪದೇ ಇರಬಹುದು. ಕಲ್ಬುರ್ಗಿಯವರ ಮಾತು, ವಿಚಾರಗಳನ್ನು ನಾವು ಒಪ್ಪಬಹುದು ಒಪ್ಪದಿರಬಹುದು. ಆದರೆ ಆ ಕಾರಣಕ್ಕಾಗಿ ಒಬ್ಬ ಘನ ವಿದ್ವಾಂಸನ ಕೊಲೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲಾಗದು. ಇದಕ್ಕೆ ಕಾರಣವಾದ ಮಾಧ್ಯಮಗಳ ಪಾತ್ರವನ್ನೂ ಮರೆಯಲಾಗದು.

ಕೊನೆಯಲ್ಲಿ ಒಂದು ವಿಷಯ ಗಮನಿಸಬೇಕು. ಕಲ್ಬುರ್ಗಿಯವರು ನಾಸ್ತಿಕರಾಗಿರಲಿಲ್ಲ. ಅವರು ಆಸ್ತಿಕರಾಗಿದ್ದರು. ದೇವರಲ್ಲಿ ನಂಬಿಕೆ ಇಟ್ಟವರಾಗಿದ್ದರು. ಮತಾಂಧತೆ, ವಿವೇಕ ಹೀನ ದ್ವೇಷ ಒಬ್ಬ ಅಪರೂಪದ ಸಂಶೋಧಕನ ಹತ್ಯೆಗೆ ಕಾರಣವಾಗಿದ್ದು ಮಾತ್ರ ದುರಂತ. ಇಂತಹ ದುರಂತಗಳು ಮತ್ತೆ ಸಂಭವಿಸದಂತಹ ಎಚ್ಚರಿಕೆಯನ್ನು ಎಲ್ಲರೂ ವಹಿಸಬೇಕು. ಭಿನ್ನಾಭಿಪ್ರಾಯಗಳಿದ್ದಲ್ಲಿ ಆರೋಗ್ಯಕರ ಟೀಕೆ-ಸಂವಾದಗಳ ಮೂಲಕ ಅದನ್ನು ಬಗೆಹರಿಸಿಕೊಳ್ಳಲು ಅವಕಾಶ ನೀಡುವ ಪ್ರಜಾಪ್ರಭುತ್ವ ಮೌಲ್ಯಗಳು ಉಳಿಯಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending