ದಿನದ ಸುದ್ದಿ

ಕರ್ನಾಟಕದ 195 ತಾಲೂಕುಗಳಲ್ಲಿ ಬರ; 30 ಸಾವಿರ ಕೋಟಿ ರೂಪಾಯಿ ಬೆಳೆ ಹಾನಿ

Published

on

ಸುದ್ದಿದಿನ ಡೆಸ್ಕ್ : ಬರ ಪರಿಸ್ಥಿತಿಯಿಂದ ನಲುಗಿರುವ ಕರ್ನಾಟಕ ರಾಜ್ಯದ ರೈತರ ಹಿತ ಕಾಪಾಡಬೇಕೆಂದು ಕೇಂದ್ರ ತಂಡಕ್ಕೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಕೇಂದ್ರ ಅಧ್ಯಯನ ತಂಡದೊಂದಿಗೆ ಮಾತುಕತೆ ನಡೆಸಿದ ನಂತರ ಅವರು ಈ ವಿಷಯ ತಿಳಿಸಿದರು. ಕೇಂದ್ರದ ಮಾರ್ಗಸೂಚಿ ಪ್ರಕಾರ 195ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬ ಹಾಗೂ ಕೊರತೆಯಿಂದ ಸಾಕಷ್ಟು ತೊಂದರೆಗೊಳಗಾಗಿದ್ದಾರೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಆಗಸ್ಟ್ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲಿ ಅತಿ ಕಡಿಮೆ ಮಳೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಕೆ.ಆರ್.ಎಸ್ ಜಲಾಶಯದ ನೀರಿನ ಮಟ್ಟ ಕಡಿಮೆಯಾಗಿದೆ ಎಂದರು. ರೈತರಿಗೆ ಎನ್‌ಡಿಆರ್‌ಎಫ್ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ಬೆಳೆ ನಷ್ಟ ಪರಿಹಾರ ಅತ್ಯಂತ ಕಡಿಮೆಯಾಗಿದ್ದು, ಇದನ್ನು ಹೆಚ್ಚಿಸಬೇಕೆಂದು ಮನವಿ ಮಾಡಿದ್ದಾರೆ.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶಮಾ, ಕಂದಾಯ ಇಲಾಖೆಯ ಕಾರ್ಯದರ್ಶಿ ರಷ್ಮಿ.ವಿ.ಮಹೇಶ್, ಕೇಂದ್ರ ತಂಡದ ಮುಖ್ಯಸ್ಥ ಅಜಿತ್ ಸಾಹು ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು. ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ತಂಡ ನಾಳೆಯಿಂದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಹಮ್ಮಿಕೊಳ್ಳಲಿದೆ.

ಈ ಮಧ್ಯೆ, ಕರ್ನಾಟಕ ರಾಜ್ಯ ಸಚಿವ ಸಂಪುಟದ ಉಪ ಸಮಿತಿ ಸಭೆ ಸೇರಿ, ಬರಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಿತು. ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಬರದಿಂದ ಒಟ್ಟು 30 ಸಾವಿರದ 432 ಕೋಟಿ ನಷ್ಟವಾಗಿದೆ. ರಾಜ್ಯದ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಾಗಿದೆ ಎಂದರು. 39 ಲಕ್ಷ 74 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ಮತ್ತು 1 ಲಕ್ಷ 82 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗೆ ಹಾನಿಯಾಗಿದೆ. ಇದರ ಒಟ್ಟಾರೆ ಮೌಲ್ಯ 4 ಸಾವಿರ ಕೋಟಿ ರೂಪಾಯಿಗೂ ಅಧಿಕ ಎಂದು ಅಂದಾಜು ಮಾಡಲಾಗಿದೆ. ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್‌ನಿಂದ 4 ಸಾವಿರದ 860.13ಕೋಟಿ ರೂಪಾಯಿ ಪರಿಹಾರ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version