ದಿನದ ಸುದ್ದಿ
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ ಕೃಷಿಗೆ 7 ತಾಸು, ಗೃಹ ಮತ್ತು ಕೈಗಾರಿಕೆಗೆ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ದ, ಸೋಲಾರ ವಿದ್ಯುತ್ ಉತ್ಪಾದನೆಗೆ ಒತ್ತು; ಇಂಧನ ಸಚಿವ ಕೆ.ಜೆ.ಜಾರ್ಜ್
ಸುದ್ದಿದಿನ,ದಾವಣಗೆರೆ:ಕೃಷಿಗೆ 7 ತಾಸು ತ್ರಿಫೇಜ್ ವಿದ್ಯುತ್ ಮತ್ತು ಗೃಹ ಬಳಕೆ ಹಾಗೂ ಕೈಗಾರಿಕೆಗೆ ದಿನದ 24 ಗಂಟೆಗಳೂ ವಿದ್ಯುತ್ ಪೂರೈಕೆ ಮಾಡುವುದು ಸರ್ಕಾರದ ನೀತಿಯಾಗಿದ್ದು ಇದಕ್ಕೆ ಬದ್ದವಾಗಿ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂಧನ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಆದರೆ ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವೇ ಸ್ಥಳಗಳಲ್ಲಿ ಮಾತ್ರ ನಿರ್ವಹಣೆಗಾಗಿ ಕಡಿತ ಮಾಡಲಾಗುತ್ತದೆ. ಆದರೆ ಸರ್ಕಾರದ ಬದ್ದತೆಯಂತೆ ಕೃಷಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ, ಆದರೆ ಲೋಡ್‍ಶೆಡ್ಡಿಂಗ್ ಜಾರಿಯಲ್ಲಿರುವುದಿಲ್ಲ ಎಂದರು.
ರಾಜ್ಯದಲ್ಲಿ ಪ್ರತಿನಿತ್ಯ 18500 ಮೆಗಾವ್ಯಾಟ್ ಬೇಡಿಕೆ ಇದ್ದು ಬೇಸಿಗೆ ಆರಂಭವಾಗಿರುವುದರಿಂದ ಸರಾಸರಿಗಿಂತ ಶೇ 10 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ. ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದರಿಂದ ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ವಿದ್ಯುತ್ ಬ್ಯಾಂಕಿಂಗ್ ಮಾಡಿಕೊಂಡು ಜೂನ್‍ನಿಂದ ಆ ರಾಜ್ಯಗಳಿಗೆ ಕರ್ನಾಟಕದಿಂದ ವಿದ್ಯುತ್ ನೀಡಿ ಬೇಸಿಗೆಯಲ್ಲಿ ಅಲ್ಲಿಂದ ಗ್ರಿಡ್ ಮೂಲಕ ವಿದ್ಯುತ್ ಪಡೆಯಲು ಉದ್ದೇಶಿಸಲಾಗಿದೆ. ಗುಣಮಟ್ಟದ ವೋಲ್ಟೇಜ್‍ಗಾಗಿ ಅಗತ್ಯವಿರುವ ಕಡೆ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.
3 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ
ಕುಸುಮ್-ಸಿ ಯೋಜನೆಯ ಮೂಲಕ ಮುಂದಿನ ಒಂದೂವರೆ ವರ್ಷದಲ್ಲಿ ಸೋಲಾರ್‍ನಿಂದದದದ 3 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹೊಂದಲಾಗಿದೆ. ಈಗಾಗಲೇ ಕುಸುಮ್ ಯೋಜನೆಯಡಿ ಸಂಸ್ಥೆಗಳಿಗೆ ಕಾರ್ಯಾದೇಶ ನೀಡಿದ್ದು ಸೋಲಾರ್ ಪ್ಯಾನಲ್ ಅಳವಡಿಕೆ, ವಿದ್ಯುತ್ ಉತ್ಪಾದನೆ ಹಂತ, ಭೂಮಿ ಸಮತಟ್ಟು ಮಾಡುವ ಕೆಲಸ ಪ್ರಗತಿಯಲ್ಲಿದ್ದು ಬರುವ ಏಪ್ರಿಲ್‍ನಲ್ಲಿ 300 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಗ್ರಿಡ್‍ಗೆ ಕಳುಹಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
3000 ಪವರ್ ಮ್ಯಾನ್ ನೇಮಕ
ಇಂಧನ ಇಲಾಖೆಯಿಂದ ಈಗಾಗಲೇ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇನ್ನಷ್ಟು ಗುಣಮಟ್ಟವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು 3 ಲಕ್ಷ ಅರ್ಜಿಗಳು ಸ್ವೀಕೃತವಾಗಿವೆ. ಈಗಾಗಲೇ ಅರ್ಜಿಗಳ ಪರಿಶೀಲನಾ ಹಂತ ಮುಗಿದಿದ್ದು 1 ಲಕ್ಷ ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಇದರಲ್ಲಿ 1;5 ರನ್ವಯ ದೈಹಿಕ ಪರೀಕ್ಷೆಗೆ ಆಯ್ಕೆ ಮಾಡಿ ಅಂತಿಮವಾಗಿ ಅತ್ಯಂತ ಪಾರದರ್ಶಕವಾಗಿ ಮೀಸಲಾತಿ ಹಾಗೂ ಅಂಕಗಳ ಆಧಾರದ ಮೇಲೆ ಏಪ್ರಿಲ್ ಒಳಗಾಗಿ ನೇಮಕಾತಿ ನಡೆಯಲಿದೆ. ಆದರೆ ಯಾವುದೇ ಮಧ್ಯವರ್ತಿಗಳ ಬಳಿ ಹಣಕೊಟ್ಟು ಕಳೆದುಕೊಳ್ಳಬೇಡಿ, ಯಾರಾದರೂ ಆಮಿಷವೊಡ್ಡಿದಲ್ಲಿ ಇಲಾಖೆ ಗಮನಕ್ಕೆ ತರಬೇಕೆಂದು ತಿಳಿಸಿದರು.
ಎಸ್ಕಾಂಗಳು ನಷ್ಟದಲ್ಲಿಲ್ಲ
ಇಂಧನ ಇಲಾಖೆಯಲ್ಲಿನ ಯಾವುದೇ ಎಸ್ಕಾಂಗಳು ನಷ್ಟದಲ್ಲಿಲ್ಲ, ಆದರೆ ಸರ್ಕಾರದಿಂದ ಸಾಕಷ್ಟು ಹಣ ಬರಬೇಕಾಗಿದೆ. ಸ್ಥಳೀಯ ಸಂಸ್ಥೆಗಳು ಸೇರಿದಂತೆ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ದಿ ಇಲಾಖೆಯಿಂದ ಕಂಪನಿಗಳಿಗೆ ಬರಬೇಕಾದ ಹಣ ಬಾಕಿ ಇದೆ. ಗ್ರಾಮ ಪಂಚಾಯಿತಿಗಳು ಸ್ವಂತವಾಗಿ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳುವ ಯೋಜನೆ ಇದ್ದು ದಾವಣಗೆರೆ ಜಿಲ್ಲೆಯಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳಲು ಉದ್ದೇಶಿಸಿ ಇದನ್ನು ಪೈಲೆಟ್ ಕಾರ್ಯಕ್ರಮವಾಗಿ ರೂಪಿಸಲಾಗುತ್ತದೆ. ಪಂಚಾಯಿತಿಗಳು ಕುಡಿಯುವ ನೀರು ಪೂರೈಕೆ, ಬೀದಿದೀಪಗಳಿಗೆ ಅಗತ್ಯವಿರುವ ವಿದ್ಯುತ್‍ನ್ನು ಉತ್ಪಾದನೆ ಮಾಡಿಕೊಂಡು ಸ್ವಾವಲಂಬಿಯಾಗಬೇಕು. ಇದಕ್ಕಾಗಿ 400 ಎಕರೆ ಜಾಗವನ್ನು ಗುರುತಿಸಿ ಸೋಲಾರ್ ಪ್ಯಾನಲ್ ಅಳವಡಿಸಿ ಗ್ರಿಡ್‍ಗೆ ವಿದ್ಯುತ್ ನೀಡಿ ಅಷ್ಟೆ ವಿದ್ಯುತ್‍ನ್ನು ವಾಪಸ್ ನೀಡಲಾಗುತ್ತದೆ. ಇದರಿಂದ ವಿದ್ಯುತ್ ಉಳಿತಾಯವಾಗಲಿದೆ ಮತ್ತು ಪಂಚಾಯಿತಿಗಳ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದರು.
ವಿದ್ಯುತ್ ದರ ಪರಿಷ್ಕರಣೆ ಕೆಇಆರ್‍ಸಿಗೆ
ಎಲ್ಲಾ ಎಸ್ಕಾಂಗಳ ವಿದ್ಯುತ್ ದರ ಏರಿಕೆಯ ನಿರ್ಧಾರವನ್ನು ಕೆಇಆರ್‍ಸಿ ಮಾಡಲಿದೆ. ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಪಡೆಯುವ ಮೂಲಕ ದರ ಏರಿಕೆ ನಿರ್ಣಯಗಳನ್ನು ಕೆಇಆರ್‍ಸಿ ನಿರ್ಧರಿಸಲಿದೆ. ಯಾರದೂ ಕೂಡ ಹಸ್ತಕ್ಷೇಪ ಇರುವುದಿಲ್ಲ, ಕಳೆದ ವರ್ಷ ಯಾವುದೇ ವಿದ್ಯುತ್ ದರ ಏರಿಕೆ ಮಾಡಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಗೃಹಜ್ಯೋತಿ
ಸರ್ಕಾರದ ಗ್ಯಾರಂಟಿ ಯೋಜನೆಗಳೊಂದಾದ ಗೃಹಜ್ಯೋತಿ ಯೋಜನೆ ಎಲ್ಲಾ ವರ್ಗದ ಜನರಿಗೂ ಅನ್ವಯಿಸಲಿದ್ದು 200 ಯುನಿಟ್ ವರೆಗೆ ವಿದ್ಯುತ್ ಬಳಕೆಗೆ ಶೂನ್ಯ ಬಿಲ್ ನೀಡಲಾಗುತ್ತದೆ. ಇದನ್ನು ಅವರು ವರ್ಷದಲ್ಲಿ ಉಪಯೋಗಿಸುವ ಯುನಿಟ್‍ಗಳನ್ನಾಧರಿಸಿ ಹೆಚ್ಚುವರಿಯಾಗಿ ಶೇ 10 ರಷ್ಟು ಸೇರಿಸಿ ಬಳಕೆಯ ಯುನಿಟ್ ನಿಗದಿಯಾಗುತ್ತದೆ. ಆದರೆ 200 ಯುನಿಟ್ ನಂತರ 1 ಯುನಿಟ್ ಹೆಚ್ಚಾದರೂ ವಿದ್ಯುತ್ ದರದಂತೆ ಬಿಲ್ ಪಾವತಿಸಬೇಕಾಗುತ್ತದೆ ಎಂದರು.
ದಾವಣಗೆರೆ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ ನೊಂದಣಿಯಾದ 433897 ಆರ್.ಆರ್.ಸಂಖ್ಯೆಗಳಿದ್ದು ವಿದ್ಯುತ್ ಸಂಪರ್ಕ ಪಡೆದ ಸ್ಥಾವರಗಳಲ್ಲಿ ಶೇ 88.93 ರಷ್ಟು ಗೃಹಜ್ಯೋತಿಯಲ್ಲಿವೆ. ಈ ಸ್ಥಾವರಗಳಿಗೆ 2023 ರ ಆಗಸ್ಟ್ ನಿಂದ 2024 ರ ಡಿಸೆಂಬರ್ ಅಂತ್ಯದವರೆಗೆ 309 ಕೋಟಿಯಷ್ಟು ಹಣವನ್ನು ಗ್ರಾಹಕರಿಗೆ ಸಬ್ಸಿಡಿ ನೀಡಿದ್ದು ಸರ್ಕಾರ ಇದನ್ನು ಭರಿಸಿದೆ ಎಂದರು.
ರೈತರಿಗೆ 7 ಗಂಟೆ ವಿದ್ಯುತ್
ರೈತರ ಕೃಷಿ ಪಂಪ್ ಸೆಟ್‍ಗಳಿಗೆ ದಿನದಲ್ಲಿ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ದಾವಣಗೆರೆ ಜಿಲ್ಲೆ ಆನಗೋಡು, ಮಾಯಕೊಂಡ ಭಾಗದಲ್ಲಿ 3 ಅಥವಾ 4 ಗಂಟೆಗಳ ಕಾಲ ಮಾತ್ರ ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ನೀಡಲಾಗುತ್ತದೆ ಎಂದು ಶಾಸಕರಾದ ಕೆ.ಎಸ್.ಬಸವಂತಪ್ಪ ಪ್ರಸ್ತಾಪಿಸಿದಾಗ ಎಲ್ಲಾ ರೈತರಿಗೂ ದಿನದಲ್ಲಿ 7 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸರ್ಕಾರದ ನೀತಿಯಾಗಿದ್ದು ಅದರಂತೆ ಬೆಸ್ಕಾಂ ಕ್ರಮ ಕೈಗೊಳ್ಳಬೇಕು. ಓವರ್ ಲೋಡಿಂಗ್ ಆದರೆ ಅದನ್ನು ಬೇರೆಡೆ ವರ್ಗಾಯಿಸಿ 7 ಗಂಟೆ ಕೃಷಿ ಪಂಪ್‍ಸೆಟ್‍ಗೆ ವಿದ್ಯುತ್ ನೀಡಲೇಬೇಕೆಂದು ಸೂಚನೆ ನೀಡಿದರು.
ಪಂಪ್‍ಸೆಟ್‍ಗಳಿಗೆ ಶೀಘ್ರ ಸಂಪರ್ಕಕ್ಕೆ ಕ್ರಮ
ರೈತರ ಕೃಷಿ ಪಂಪ್‍ಸೆಟ್‍ಗಳಿಗೆ 2004 ರಿಂದಲೂ ಅಕ್ರಮ-ಸಕ್ರಮ ಎಂಬ ಕಾರ್ಯಕ್ರಮದಡಿ ಅನಧಿಕೃತ ಸಂಪರ್ಕವನ್ನು ಸಕ್ರಮ ಮಾಡುತ್ತಾ ಬರಲಾಗಿದೆ. ಇದರಡಿ ಮೂಲಭೂತ ಸೌಕರ್ಯದಡಿ ಮಾರ್ಗ, ಟಿಸಿ ಅಳವಡಿಕೆ ಮಾಡಲಾಗಿದೆ. ಬಾಕಿ ಇರುವ 4946 ಪಂಪ್‍ಸೆಟ್‍ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಟೆಂಡರ್ ಕರೆಯಲಾಗಿದೆ. ರೈತರು ಸ್ವಂತವಾಗಿ ಮೂಲಭೂತ ಸೌಕರ್ಯ ಮಾಡಿಕೊಂಡು ಕೃಷಿ ಪಂಪ್‍ಸೆಟ್‍ಗಳಿಗೆ ತಕ್ಷಣವೇ ಸಂಪರ್ಕ ಪಡೆಯಲು ಹಾಗೂ ಇಲಾಖೆಯಿಂದ ಮೂಲಭೂತ ಸೌಕರ್ಯಕ್ಕಾಗಿ ಸರತಿಯಲ್ಲಿ ಕಾಯುವ ಎರಡು ಅವಕಾಶಗಳನ್ನು ಮಾಡಿಕೊಟ್ಟಲ್ಲಿ ಸ್ವಂತವಾಗಿ ಮಾಡಿಕೊಳ್ಳುವ ರೈತರಿಗೆ ಅನುಕೂಲವಾಗುತ್ತದೆ ಎಂಬ ಚಿಂತನೆ ಮಾಡಲಾಗಿದೆ ಎಂದರು.
ಕಸುಮ್-ಬಿ
ಕುಸುಮ್ ಬಿ ಯೋಜನೆಯಡಿ ರೈತರ ಪಂಪ್‍ಸೆಟ್‍ಗಳಿಗೆ ಸೋಲಾರ್ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿದೆ. 7.5 ಹೆಚ್‍ಪಿ ವರೆಗೆ ಅವಕಾಶ ಇದ್ದು ರೈತರು ಶೇ 20 ರಷ್ಟು ವಂತಿಗೆಯನ್ನು ಕಟ್ಟಬೇಕು. ಕೇಂದ್ರ ಶೇ 30 ಹಾಗೂ ರಾಜ್ಯ ಶೇ 50 ರಷ್ಟು ಸಹಾಯಧನ ಘಟಕ ವೆಚ್ಚಕ್ಕೆ ನೀಡಲಿದೆ. ಮತ್ತು ಕುಸುಮ್-ಸಿ ಯೋಜನೆಯಡಿ ಖಾಸಗಿ ಹಾಗೂ ಸರ್ಕಾರಿ ಜಮೀನುಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ಗ್ರಿಡ್‍ಗೆ ಪೂರೈಕೆ ಮಾಡುವುದಾಗಿದೆ. ರೈತರು ಸೋಲಾರ್ ಪಂಪ್‍ಸೆಟ್ ಅಳವಡಿಕೆಗೆ ಮುಂದೆ ಬಂದಲ್ಲಿ ಹೆಚ್ಚು ಅನುಕೂಲವಾಗಲಿದೆ ಎಂದರು.
ಸಭೆಯಲ್ಲಿ ಶಾಸಕರಾದ ಕೆ.ಎಸ್.ಬಸವಂತಪ್ಪ, ಲತಾ ಮಲ್ಲಿಕಾರ್ಜುನ್, ಬಿ.ದೇವೇಂದ್ರಪ್ಪ, ಕೆಪಿಟಿಸಿಎಲ್ ಎಂಡಿ ಪಂಕಜ್‍ಕುಮಾರ್ ಪಾಂಡೆ, ಬೆಸ್ಕಾಂ ಎಂಡಿ ಡಾ; ಶಿವಶಂಕರ್ ಎನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಪಾಟೀಲ್ ಹಾಗೂ ಬೆಸ್ಕಾಂ, ಕೆಪಿಟಿಸಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


