Connect with us

ದಿನದ ಸುದ್ದಿ

ಶಿಕ್ಷಣ ಇಲಾಖೆ ದಿವಾಳಿ ; ಅಪ್ರಯೋಜಕ ಶಿಕ್ಷಣ ಸಚಿವರಿಂದ ಶಿಕ್ಷಣ ಕ್ಷೇತ್ರ ಅಧ್ವಾನ : ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ

Published

on

ಸುದ್ದಿದಿನ ಡೆಸ್ಕ್ : ದೇಶಕ್ಕೆ ಮಾದರಿಯಾಗಬೇಕಿದ್ದ ರಾಜ್ಯದ ಶಿಕ್ಷಣ ಇಲಾಖೆಯನ್ನ ವಿವಾದಿತ ಕೇಂದ್ರವನ್ನಾಗಿಸಿದ ಕೀರ್ತಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಗೆ ಸಲ್ಲಬೇಕು. ಪಠ್ಯ ಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ನಾಡಿನ ಸಾಂಸ್ಕೃತಿಕ ನಾಯಕರಿಗೆ ಅಪಮಾನ ಮಾಡಿ ದೇಶದ ಎದುರು ಮಾನ ಕಳೆಯುವಂತೆ ಮಾಡಿದ್ದು ಸಾಲದಾಗಿಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಇಲ್ಲಿಯವರೆಗೂ ಪರಿಷ್ಕರಣೆಯ ಬಗ್ಗೆ ಬಂದಿರುವ ಆಕ್ಷೇಪಗಳಿಗೆ ಉತ್ತರ ನೀಡುವ ಎದೆಗಾರಿಕೆಯೂ ಇಲ್ಲ. ದಿನಕ್ಕೊಂದು ಅವಾಂತರಗಳು, ಹಗರಣಗಳು ಧಾರಾವಾಹಿಯಂತೆ ಇಲಾಖೆಯಲ್ಲಿ ಕಂತುಗಳಲ್ಲಿ ಬರುತ್ತಿವೆ. ಈಗ ಇಡೀ ಇಲಾಖೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ತಂದು ನಿಲ್ಲಿಸಿದ್ದಾರೆ. ಇಂತಹ ಅಪ್ರಯೋಜಕ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರಿಂದ ಇಡೀ ಶಿಕ್ಷಣ ಇಲಾಖೆ ಅಧ್ವಾನದ ಕೂಪವಾಗಿದೆ.

ಶಾಲೆಗಳು ಪ್ರಾರಂಭವಾಗುವ ಮುನ್ನ ಪೂರ್ವಯೋಜಿತ ತಯಾರಿಗಳೊಂದಿಗೆ ಪ್ರಾರಂಭಿಸಲಾಗುತ್ತೆ. ಶಾಲೆಗಳಿಗೆ ಪಠ್ಯಪುಸ್ತಕ ಸರಬರಾಜು, ಶಿಥಿಲಗೊಂಡಿರುವ ಕೊಠಡಿಗಳ ದುರಸ್ಥಿಗೆ ಹಣ ಬಿಡುಗಡೆ, ಶಾಲಾ ಮಕ್ಕಳಿಗೆ ಶೂಗಳನ್ನ ನೀಡುವುದು ಸೇರಿದಂತೆ ಮೂಲ ಸೌಕರ್ಯಗಳ ತಯಾರಿಗಳೊಂದಿಗೆ ಪ್ರಾರಂಭ ಮಾಡಲಾಗುತ್ತೆ. ಆದ್ರೆ ಶಿಕ್ಷಣ ಇಲಾಖೆ ಹಾಗೂ ಸಚಿವರು ಕೇವಲ ಪಠ್ಯ ಪರಿಷ್ಕರಣೆ ನೆಪದಲ್ಲಿಯೇ ಕಾಲ ಕಳೆಯುತ್ತಿವೆ ಎಂದು ಕಿಡಿಕಾರಿದ್ದಾರೆ.

ಶಾಲೆಗಳು ಪ್ರಾರಂಭವಾಗಿ ಒಂದುವರೆ ತಿಂಗಳುಗಳು ಕಳೆಯುತ್ತಿವೆ. ಇಲ್ಲಿವರೆಗೂ ಪಠ್ಯ ಪುಸ್ತಕಗಳನ್ನ ಶಾಲೆಗಳಿಗೆ ತಲುಪಿಸಿಲ್ಲ ಎಂಬ ದೂರುಗಳು ಬರುತ್ತಿವೆ. ಇನ್ನೊಂದೆಡೆ ಪಠ್ಯ ಪರಿಷ್ಕರಣೆ ನೆಪದಲ್ಲಿ ಆಗಿರುವ ಪ್ರಮಾದಗಳಿಗೆ ತೇಪೆ ಹಚ್ಚಿ, ಮರು ಮುದ್ರಣ ಮಾಡಿಸುತ್ತೇವೆಂದು ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ಈಗಾಗಲೇ ಕೆಲವು ಶಾಲೆಗಳಿಗೆ ತಲುಪಿರುವ ಪಠ್ಯ ಪುಸ್ತಕಗಳ ಕತೆಗಳೇನು? ಹೊಸದಾಗಿ ಮುದ್ರಣವಾಗುವ ಪುಸ್ತಕಗಳನ್ನ ಸರಬರಾಜು ಯಾವಾಗ ಮಾಡಲಾಗುತ್ತೆ? ಮುದ್ರಣ-ಮರು ಮುದ್ರಣದ ಹೆಸರಿನಲ್ಲಿ ನೂರಾರು ಕೋಟಿ ಖರ್ಚು ಮಾಡಿ ಜನರ ತೆರಿಗೆ ಹಣವನ್ನ ದುರಪಯೋಗ ಮಾಡುತ್ತಿರುವುದು ಯಾಕೆ? ಒಬ್ಬ ಟ್ರೋಲರ್ ಅಂತಹ ಅವಿವೇಕಿ ಮಾಡಿದ ತಪ್ಪಿಗೆ ಜನರ ಹಣ ಪೋಲು ಮಾಡುತ್ತಿದೆ ಈ ಸರ್ಕಾರ.

ರಾಜ್ಯದಲ್ಲಿ 75,675 ಶಾಲೆಗಳ ಕೊಠಡಿಗಳನ್ನ ದುರಸ್ಥಿ ಮಾಡಬೇಕಾಗಿದ್ದು, 2,682 ಕೋಟಿ ಹಣ ವ್ಯಯ ಮಾಡಬೇಕಿದೆ ಎಂದು ಶಿಕ್ಷಣ ಇಲಾಖೆ ಕ್ರಿಯಾ ಯೋಜನೆ ತಯಾರಿಸಿ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಪ್ರಸ್ತಾಪನೆ ಸಲ್ಲಿಸಿದೆ. ಸಾವಿರಾರು ಶಾಲೆಗಳು ಶಿಥಿಲಗೊಂಡಿರುವ ಮಾಹಿತಿ ಮೊದಲೇ ಇದ್ದರು ಶಿಕ್ಷಣ ಇಲಾಖೆ ಶಾಲೆಗಳು ಪ್ರಾರಂಭವಾಗುವ ಮುನ್ನವೇ ಎಚ್ಚೆತ್ತುಕೊಂಡು ಕ್ರಿಯಾ ಯೋಜನೆ ಯಾಕೆ ರೂಪಿಸಲಿಲ್ಲ? 40% ಕಮಿಷನ್ ವ್ಯವಹಾರದ ಮಾತುಕತೆ ಇನ್ನೂ ಮುಗಿದಿರಲಿಲ್ವಾ? ಶಿಕ್ಷಣ ಸಚಿವರು ಟ್ರೋಲರ್ ನ ಸಮರ್ಥನೆಯಲ್ಲೇ ಕಾಲ ದೂಡಿದ್ರಾ? ಇಂತಹ ಬೇಜವಾಬ್ದಾರಿ ಶಿಕ್ಷಣ ಸಚಿವರಿಂದ ಹಾಗೂ ಕೆಲವು ಅಧಿಕಾರಿಗಳಿಂದ ವಿದ್ಯಾರ್ಥಿಗಳು ಜೀವ ಕೈಯಲ್ಲಿ ಬಿಗಿ ಹಿಡಿದು ಅಭ್ಯಾಸ ಮಾಡುವಂತಾಗಿದೆ.

ಮಳೆಗಾಲ ಪ್ರಾರಂಭವಾಗಿರುವುದರಿಂದ ದುರಸ್ಥಿ ಇರುವ ಶಾಲೆಗಳ ಪರಿಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದೆ. ಶಾಲೆಗಳ ಕೊಠಡಿಗಳು ಯಾವಾಗ ತಲೆಯ ಮೇಲೆ ಹೊತ್ತು ಬೀಳುತ್ತವೆ ಎಂದು ಶಾಲೆಯ ಮಕ್ಕಳು ಭಯಭೀತರಾಗಿದ್ದಾರೆ. ಇಂತಹ ದಯನೀಯ ಸ್ಥಿತಿಗೆ ಶಿಕ್ಷಣ ಇಲಾಖೆಯನ್ನ ದೂಡಲಾಗಿದೆ. ಕೂಡಲೇ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ತ್ವರಿತವಾಗಿ ಶಾಲೆಗಳಿಗೆ ಹಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸುತ್ತೇನೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಭಾಗ್ಯ ಜಾರಿಗೆ ತಂದಿತ್ತು. ಯೋಜನೆಯಿಂದ 60 ರಿಂದ 70 ಲಕ್ಷ ವಿದ್ಯಾರ್ಥಿಗಳು ಫಲಾನುಭವಿಯಾಗಿದ್ದರು. ಖಾಸಗೀ ಶಾಲೆಯ ಮಕ್ಕಳ ಹಾಗೆಯೇ ಸರ್ಕಾರಿ ಶಾಲೆಯಲ್ಲಿ ಕಲಿಯುವ ಲಕ್ಷಾಂತರ ಮಕ್ಕಳು ಕೂಡ ಶೂ ಧರಿಸಿಕೊಂಡೆ ಶಾಲೆಗೆ ಬರುತ್ತಿದ್ದರು. ಆದ್ರೆ ಈ ಸರ್ಕಾರ ಬಡವರ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಕೊಡಿಸದೇ ಇರೋವಷ್ಟು ದಾರಿದ್ರ್ಯ ಬಂದಿದೆ.

2019-20ನೇ ಸಾಲಿನ ಕೊನೆದಾಗಿ ಸರ್ಕಾರ ಈ ಯೋಜನೆಗೆ ಹಣ ಬಿಡುಗಡೆ ಮಾಡಿದ್ದು ಬಿಟ್ಟರೇ, 2020-21, 2021-22 ಮತ್ತು ಈ ವರ್ಷ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಭಾಗ್ಯಕ್ಕೆ ಹಣವೇ ಮೀಸಲಿಟ್ಟಿಲ್ಲ. ಕನಿಷ್ಠ ಅದರ ಬಗ್ಗೆ ಇಲ್ಲಿವರೆಗೆ ಚರ್ಚೆಯೂ ನಡೆಸಿಲ್ಲ, ಶಿಕ್ಷಣ ಇಲಾಖೆ ಈ ಮಟ್ಟದ ಆರ್ಥಿಕ ದಿವಾಳಿತನ ಎದುರಿಸುತ್ತಿದ್ಯಾ? ರಾಷ್ಟ್ರೋತ್ತನ ಶಾಲೆಗಳಿಗೆ ವಿಶೇಷ ಒತ್ತು ನೀಡಿ ಪಠ್ಯ ಪುಸ್ತಕ ಖರೀದಿಗೆ,ಮೂಲ ಸೌಲಭ್ಯಗಳಿಗೆ ನೂರಾರು ಕೋಟಿ ಶೀಘ್ರವಾಗಿ ಬಿಡುಗಡೆ ಮಾಡುವ ಸರ್ಕಾರ ಬಡ ಮಕ್ಕಳ ಮೇಲೆ ಯಾಕೆ ಇಷ್ಟು ತಾತ್ಸರ? ಕೇವಲ ಸಂಘಪರಿವಾರವನ್ನ ಒಲೈಕೆ ಮಾಡುವುದರಲ್ಲೇ ಕಾಲ ಕಳೆಯುತ್ತಿದೆ.

ಬಡ ಮಕ್ಕಳಿಗೆ ಶೂ ಕೊಡಲು ಯೋಗ್ಯತೆ ಇಲ್ಲದ ಮಂತ್ರಿಗಳು ಅಪ್ರಯೋಜಕರು. ದಿನಾಲೂ ಶಿಕ್ಷಣ ಇಲಾಖೆಯನ್ನ ವಿವಾದಿತ ಕೇಂದ್ರವನ್ನಾಗಿ ಮಾಡಿದ್ದಾರೆ. ಶಿಕ್ಷಣ ಇಲಾಖೆಯನ್ನ ನಿಭಾಯಿಸಲು ಶಕ್ತರಲ್ಲದ ಶಿಕ್ಷಣ ಸಚಿವ ಬಿಸಿ ನಾಗೇಶ್ ರಾಜೀನಾಮೆ ನೀಡಿಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending