ದಿನದ ಸುದ್ದಿ

ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆ ಪ್ರೋತ್ಸಾಹಿಸಿ : ಪ್ರಧಾನಿ ನರೇಂದ್ರ ಮೋದಿ

Published

on

ಸುದ್ದಿದಿನ, ನವದೆಹಲಿ: ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಸ್ಥಳೀಯ ಭಾಷೆಗಳ ಬಳಕೆಯು ನ್ಯಾಯಾಂಗ ವ್ಯವಸ್ಥೆ ಮೇಲಿನ ಜನ ಸಾಮಾನ್ಯರ ವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.

ನವದೆಹಲಿಯಲ್ಲಿ ಶನಿವಾರ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮ್ಮೇಳನದ ಉದ್ಘಾಟನಾ ಭಾಷಣಮಾಡಿದ ಪ್ರಧಾನಿ, ಡಿಜಿಟಲ್ ಇಂಡಿಯಾ ಅಭಿಯಾನದ ಅತ್ಯಗತ್ಯ ಭಾಗವಾಗಿ ನ್ಯಾಯಾಂಗ ವ್ಯವಸ್ಥೆಯಲ್ಲಿ ತಂತ್ರಜ್ಞಾನದ ಸಾಧ್ಯತೆಗಳನ್ನು ಸರ್ಕಾರ ಪರಿಗಣಿಸುತ್ತದೆ ಎಂದು ಹೇಳಿದರು.

ಇ-ನ್ಯಾಯಾಲಯಗಳು ಯೋಜನೆ ಜಾರಿಯನ್ನು ದೇಶದಲ್ಲಿ ತೀವ್ರಗೊಳಿಸಲಾಗುತ್ತಿದೆ. ನ್ಯಾಯಾಂಗ ಸಂವಿಧಾನದ ರಕ್ಷಕನಾಗಿದ್ದು, ಶಾಸಕಾಂಗ ನಾಗರಿಕರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತದೆ ಈ ಸಮತೋಲನವು ದೇಶದಲ್ಲಿ ಪರಿಣಾಮಕಾರಿ, ಕಾಲಮಿತಿಯ ನ್ಯಾಯಾಂಗ ವ್ಯವಸ್ಥೆಗೆ ಮಾರ್ಗಸೂಚಿ ಸಿದ್ಧಪಡಿಸುತ್ತದೆ ಎಂದು ಪ್ರಧಾನಿ ಹೇಳಿದರು.

ಸಭೆ ಉದ್ದೇಶಿಸಿ ಮಾತನಾಡಿದ ಭಾರತ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಸಂವಿಧಾನ ಪ್ರಜಾಪ್ರಭುತ್ವದ ಮೂರು ಅಂಗಗಳ ನಡುವೆ ಅಧಿಕಾರವನ್ನು ಪ್ರತ್ಯೇಕಿಸುತ್ತದೆ. ಎಲ್ಲರೂ ತಮ್ಮ ಕರ್ತವ್ಯ ನಿರ್ವಹಿಸುವಾಗ, ತಮ್ಮ ತಮ್ಮ ’ಲಕ್ಷ್ಮಣ ರೇಖೆ’ಯ ಬಗ್ಗೆ ಜಾಗರೂಕರಾಗಿರಬೇಕು ಎಂದು ಹೇಳಿದರು.

ಮೂರು ಅಂಗಗಳ ನಡುವಿನ ಸಾಮರಸ್ಯ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಕರ್ತವ್ಯವನ್ನು ನಿರ್ವಹಿಸುವಾಗ ನಾವು ಲಕ್ಷ್ಮಣ ರೇಖೆಯ ಬಗ್ಗೆ ಸದಾ ಎಚ್ಚರದಿಂದ ಇರಬೇಕು ಎಂದರು.

ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ದುರುಪಯೋಗದ ಬಗ್ಗೆ ಕಳವಳ ವ್ಯಕ್ತಪಡಿಸಿದ ಎನ್.ವಿ.ರಮಣ, ಈಗ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ವೈಯಕ್ತಿಕ ಹಿತಾಸಕ್ತಿ ಅರ್ಜಿಯಾಗಿ ಬದಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version