ನೆಲದನಿ
ನುಡಿಯ ಒಡಲು – 18 | ಇಂಗ್ಲಿಶ್ ಮಾಧ್ಯಮ ಎಂಬ ಕಣ್ಕಟ್ಟು
- ಡಾ. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಇಂಗ್ಲಿಶ್ ಮಾಧ್ಯಮದಲ್ಲಿ ಶಿಕ್ಷಣ ಯಾಕಾಗಿ? ಯಾರಿಗಾಗಿ ಬೇಕು? ಎನ್ನುವ ಪ್ರಶ್ನೆಗಳನ್ನು ಎದುರುಗೊಳ್ಳದೇ, ಮಾಧ್ಯಮದ ಸುತ್ತಲೂ ನೆಲೆಗೊಂಡಿರುವ ಅಪಕಲ್ಪನೆಗಳನ್ನು ಪರಿಹರಿಸಿಕೊಳ್ಳುವುದು ಕಷ್ಟ. ಶಿಕ್ಷಣದ ಬಗೆಗಿನ ತಾತ್ವಿಕ ಇಲ್ಲವೇ ಪ್ರಾಯೋಗಿಕ ತಿಳಿವು ರಾಜಕೀಯ ಪ್ರೇರಿತವಾದರೆ, ಶೈಕ್ಷಣಿಕವಾಗಿ ಇದು ಕರ್ಯಸಾಧುವಾದ ನಿಲುವಾಗಲಾರದು. ಭಾಷೆಯೊಂದು ಅತ್ಯಂತ ಗಂಭೀರವಾದ ಗ್ರಹಿಕೆ. ಭಾಷೆಯನ್ನು ಕುರಿತ ನಮ್ಮ ತಿಳುವಳಿಕೆ ವೈಜ್ಞಾನಿಕವಾಗಿಲ್ಲ.
ಹಾಗಾಗಿ ಶಿಕ್ಷಣ ಮತ್ತು ಭಾಷೆಯ ಸಂಬಂಧವನ್ನು ಅರಿಯುವಲ್ಲಿ ನಾವು ಸೋತಿದ್ದೇವೆ. ಆದ್ದರಿಂದ ಇಂಗ್ಲಿಶು ಮಾಧ್ಯಮ ಹಾಗೂ ಇಂಗ್ಲಿಶು ಕಲಿಕೆ ನಮಗೆ ಯಾಕೆ ಮುಖ್ಯ? ಕಲಿಕೆಯೆಂದರೇನು? ಕಲಿಕೆಯ ವಿಧಾನ, ಪಠ್ಯಕ್ರಮ ಹಾಗೂ ಮೂಲಭೂತ ಸೌರ್ಯಗಳು ಹೇಗಿರಬೇಕು? ಎಂಬೆಲ್ಲ ಪ್ರಾಥಮಿಕ ಅನುಭವವು ನಮಗಿಲ್ಲ ಕೇವಲ ಇಂಗ್ಲಿಶು ಮೂಲಕ ಕಲಿಕೆಯನ್ನು ಶುರು ಮಾಡಿದರೆ, ಇವತ್ತು ನಾವು ಎದುರಿಸುತ್ತಿರುವ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಹಾಗೂ ಔದ್ಯೋಗಿಕ ಬಿಕ್ಕಟ್ಟುಗಳಿಗೆ ಪರಿಹಾರಗಳು ದೊರೆಯುತ್ತವೆ ಎನ್ನುವ ಮೂಢನಂಬಿಕೆಯಲ್ಲಿದ್ದೇವೆ.
ನಮ್ಮ ಬದುಕಿನಲ್ಲಿ ಸಮಾನತೆಯನ್ನು ಸಾಧಿಸಲು, ಸಾಮಾಜಿಕ ಕಳಂಕಗಳಾದ ಅಸ್ಪೃಶ್ಯತೆ, ಜಾತೀಯತೆಯನ್ನು ಮೀರುವ ವಾತಾವರಣ ಇಂಗ್ಲಿಶು ಕಲಿಯುವುದರ ಮೂಲಕ ತನ್ನಷ್ಟಕ್ಕೆ ಸೃಷ್ಟಿಯಾಗುತ್ತದೆ ಎಂಬಂತಹ ತಪ್ಪು ನಂಬಿಕೆಯೂ ಇವತ್ತು ನಮ್ಮನ್ನು ಆವರಿಸಿಕೊಂಡಿದೆ.
ಭಾರತದಲ್ಲಿ ಇಂಗ್ಲಿಶು ಶಿಕ್ಷಣವನ್ನು ಆರಂಭಿಸುವುದರ ಹಿಂದಿನ ಉದ್ದೇಶವನ್ನು ಮೆಕಾಲೆ ತನ್ನ ಮಿನಿಟಿನಲ್ಲಿ ನಿಚ್ಚಳವಾಗಿಯೇ ಉಚ್ಚರಿಸಿದ್ದಾನೆ. ಅದೇನೆಂದರೆ, ‘ಭಾರತೀಯರು ರಕ್ತ, ಮಾಂಸ, ಮೈಬಣ್ಣದಲ್ಲಿ ಮಾತ್ರ. ಅವರ ಅಭಿಪ್ರಾಯಗಳು, ಆಲೋಚನಾಕ್ರಮಗಳು, ನೈತಿಕತೆ ಹಾಗೂ ಬೌದ್ಧಿಕ ಚಟುವಟಿಕೆಗಳು ಇಂಗ್ಲಿಶು ಆಗಿರಬೇಕು’ ಬ್ರಿಟಿಶರಿಗೆ ಅಡಿಯಾಳಾಗಿ ನಾವು ಕೆಲಸ ಮಾಡಬೇಕು ಎಂಬ ಮೆಕಾಲೆ ಮಾತಿನ ಈ ಒಳ ಉದ್ದೇಶವನ್ನು ಇಂದಿಗೂ ನಮ್ಮಿಂದ ಅರಿತುಕೊಳ್ಳಲು ಸಾಧ್ಯವಾಗಲಿಲ್ಲ.
ಪರಿಣಾಮವಾಗಿ ಬಂಡವಾಳಶಾಹಿ, ಬಹುರಾಷ್ಟ್ರೀಯ ಕಂಪನಿಗಳ ಬೆಳವಣಿಗೆಗೆ ದುಡಿಯುವ ಮಾನವ ಸೇವಾ ಸಂಪನ್ಮೂಲವನ್ನು ಇಂಗ್ಲಿಶಿನ ಮೂಲಕ ವಸಾಹತುಶಾಹಿ ಪ್ರಾಬಲ್ಯಕ್ಕೆ ಈಡಾದ ದೇಶಗಳಲ್ಲಿ ರೂಪಿಸಲಾಗುತ್ತದೆ. ಇದನ್ನೇ ನಾವು ನಮ್ಮ ಸಾಂಸ್ಕೃತಿಕ, ಆರ್ಥಿಕ ಹಾಗೂ ರಾಜಕೀಯ ವಿಮೋಚನೆಯ ದಾರಿಯೆಂದು ಮತ್ತು ಅಲಕ್ಷಿತ ಸಮೂಹಗಳ ಸಮಗ್ರ ಸಬಲೀಕರಣಗೊಳ್ಳುವ ಬಗೆಯೆಂದು ತೀರ್ಮಾನಿಸಿದ್ದೇವೆ.
ಹೊಸ ಸ್ವರೂಪದ ಆರ್ಥಿಕ, ಸಾಂಸ್ಕೃತಿಕ, ರಾಜಕೀಯ ಶೋಷಣೆಯ ಅಸ್ತ್ರವಾಗಿ ಇಂಗ್ಲಿಶು ತಲೆಯೆತ್ತಿದ್ದನ್ನು ಮರೆತು, ಅದರ ಬೆನ್ನುಹತ್ತಿ ಹೋಗುತ್ತಿರುವುದನ್ನು ಕಂಡು, ಪ್ರಭುತ್ವ ತನ್ನ ರಾಜಕೀಯ ಉದ್ದೇಶಗಳನ್ನು ಈಡೇರಿಸಿಕೊಳ್ಳುವ ಧಾವಂತದಲ್ಲಿದೆ. ಇಂಗ್ಲಿಶು ಒಂದು ಉದ್ಯಮೆಯಾಗಿ ಸೃಷ್ಟಿಯಾಗಿದ್ದರ ಪರಿಣಾಮವಾಗಿ, ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಇಂಗ್ಲಿಶು ಮಾಧ್ಯಮದ ಮೂಲಕ ತಮ್ಮ ವ್ಯಾಪಾರವನ್ನು ನಡೆಸುತ್ತಿವೆ.
ಇಂಗ್ಲಿಶು ಮಾಧ್ಯಮದಿಂದ ಮಕ್ಕಳ ತಿಳಿವು ವಿಸ್ತಾರಗೊಳ್ಳುತ್ತದೆ, ವಿಶ್ವದಾದ್ಯಂತ ಲೀಲಾಜಾಲವಾಗಿ ಓಡಾಡುವ ಸಾಮರ್ಥ್ಯವನ್ನು ಇವರು ಪಡೆದುಕೊಳ್ಳುತ್ತಾರೆ ಅನ್ನುವುದು ತಪ್ಪು ಲೆಕ್ಕಾಚಾರವಾಗಿದೆ.
ಹೊಸ ಆರ್ಥಿಕ ನೀತಿಗಳಿಗೂ, ಜಾಗತೀಕರಣಕ್ಕೂ, ಉದ್ಯೋಗವಕಾಶಗಳಿಗೂ ಮತ್ತು ಇಂಗ್ಲಿಶು ಭಾಷೆಗೂ ಪರಸ್ಪರ ಸಂಬAಧವನ್ನು ಕಲ್ಪಿಸಲಾಗಿದೆ. ಒಟ್ಟಾರೆ ಲೋಕದ ಕಲ್ಯಾಣಕ್ಕೆ ಇಂಗ್ಲಿಶು ಭಾಷೆಯೇ ಕಾರಣ ಎಂಬ ಹುಸಿನಂಬಿಕೆ ನಮ್ಮ ಇವತ್ತಿನ ಶೈಕ್ಷಣಿಕ ಅವಘಡಗಳಿಗೆ ಪ್ರೇರಣೆಯಾಗಿದೆ. ಕಲಿಕೆ ಮತ್ತು ಬೋಧನೆ ಸೃಜನಶೀಲ ಕ್ರಿಯೆಯೇ ಹೊರತು ಅದೊಂದು ಕೇವಲ ಅನುಕರಣಾ ಪ್ರಕ್ರಿಯೆಯಲ್ಲ.
ಈ ವಾಸ್ತವವನ್ನು ಮನಗಾಣಲು ಇವತ್ತಿಗೂ ನಮಗೆ ಯಾಕೆ ಸಾಧ್ಯವಾಗಿಲ್ಲ? ಈಗಾಗಲೇ ನಮಗೆ ಚಿರಪರಿಚಿತವಾಗಿರುವ ಭಾಷೆಗಳ ಮೂಲಕ ಪಡೆಯುವ ಶಿಕ್ಷಣ ಸೃಜನಶೀಲವೂ, ಪ್ರಾಯೋಗಿಕವೂ ಆಗಿರುವುದಕ್ಕೆ ಸಾಧ್ಯವಿದೆ. ಹೌದು ತಾಯ್ನುಡಿ ಇಲ್ಲವೇ ಪರಿಸರದ ಭಾಷೆಯಲ್ಲಿ ಕಲಿಯಬೇಕು ಎನ್ನುವುದಕ್ಕೆ ಏನಾದರೂ ವೈಜ್ಞಾನಿಕ ಕಾರಣಗಳಿವೇ? ಎಂಬ ಪ್ರಶ್ನೆ ಇಲ್ಲಿ ತಲೆಯೆತ್ತಬಹುದು.
ಮಗು ಶಾಲೆಗೆ ಹೋಗುವಷ್ಟೊತ್ತಿಗೆ ತನ್ನ ತಾಯ್ನುಡಿ ಇಲ್ಲವೇ ಪರಿಸರದ ನುಡಿಯಲ್ಲಿ ಕಸುವನ್ನು ಪಡೆದಿರುತ್ತದೆ. ಯಾವುದೇ ನುಡಿಯನ್ನು ಪಡೆದುಕೊಳ್ಳುವ ಮಾನಸಿಕ ಕಸುವು ಮಗುವಿನಲ್ಲಿ ಅಂತಸ್ಥವಾಗಿರುತ್ತದೆ. ಆದರೆ ಆ ಕಸುವು ಒಂದು ನುಡಿಯಾಗಿ ಒಡಮೂಡಿ ಅಭಿವ್ಯಕ್ತಿಗೊಳ್ಳಲು ನುಡಿ ಸಾಮಾಗ್ರಿಗಳು ಮಗುವಿನ ಪರಿಸರದಲ್ಲಿಯೇ ಯಥೇಚ್ಛವಾಗಿ ಲಭಿಸಬೇಕು.
ಅಂದರೆ ಮಗುವಿನ ಮನೆ, ಬೀದಿ, ಸರ್ವಜನಿಕ ವಲಯಗಳಲ್ಲಿ ಆಯಾ ನುಡಿಯನ್ನು ಪಡೆಯುವುದಕ್ಕೆ ಬೇಕಾದ ವಿಪುಲವಾದ ನುಡಿ ಕಣಜ ದೊರೆಯತ್ತದೆ. ಆದರೆ ಇಂಗ್ಲಿಶು ನುಡಿ ಕಲಿಕೆಗೆ ಬೇಕಾದ ಇಂತಹ ವಾತಾವರಣ ಸಹಜವಾಗಿಯೇ ಒದಗಿಬರುವುದಿಲ್ಲ.
ಪ್ರಾಥಮಿಕ ಶಿಕ್ಷಣವನ್ನು ಪಡೆಯಲು ಇಂಗ್ಲಿಶು ದಾರಿಯಾಗದೇ ಕೇವಲ ಗೋಡೆಯಾಗುವ ಅಪಾಯವೂ ಇದೆ.
ಹಾಗಾಗಿಯೇ ಯುನಿಸ್ಕೋ ಸಂಸ್ಥೆಯ ವರದಿ ಪ್ರಕಾರ ಮಕ್ಕಳ ಶಿಕ್ಷಣವನ್ನು ನುಡಿ ೧ (ಎಲ್೧)ರಲ್ಲಿ ಕೊಡುವುದು ಸೂಕ್ತ. ಶಾಲೆಗೆ ಬರುವ ಮೊದಲೇ ಮಕ್ಕಳು ತಮ್ಮ ತಾಯ್ನುಡಿ/ಪರಿಸರದ (ನುಡಿ೧) ನುಡಿಯಲ್ಲಿ ಕಸುವನ್ನು ಪಡೆದುಕೊಂಡು ಕಲಿಕೆಯ ಪ್ರಕ್ರಿಯೆಗೆ ಸಜ್ಜಾಗಿರುತ್ತಾರೆ. ಇಂಗ್ಲಿಶು ನುಡಿ೨ರಲ್ಲಿ (ಎಲ್೨) ಕಲಿಕೆ ಹಾಗೂ ವಿಷಯ ಗ್ರಹಿಕೆಗೆ ಪೂರಕವಾದ ಎರಡೂ ಬಗೆಯ ಭಾಷಿಕ ವಾತಾವರಣ ಏಕಕಾಲಕ್ಕೆ ಮಗುವಿಗೆ ಲಭಿಸುವುದು ಅಸಾಧ್ಯ.
ಹಾಗೂ ಇಂತಹ ಹೊರಗಿನ ನುಡಿಯ ಮೂಲಕ ಕಲಿಕೆಯನ್ನು ಶುರುಮಾಡಿದರೆ, ಸರಿಯಾದ ಪಠ್ಯಕ್ರಮದ ಕೊರತೆ, ಸರಿಯಾದ ತರಬೇತಿಯಿಲ್ಲದ ಶಿಕ್ಷಕರು ಹಾಗೂ ಸುಸಜ್ಜಿತ ಮೂಲಭೂತ ಸೌರ್ಯಗಳ ಅಭಾವವಿರುವ ಸನ್ನಿವೇಶದಲ್ಲಿ ಇಂಗ್ಲಿಶು ಮಾಧ್ಯಮದಲ್ಲಿ ಶಿಕ್ಷಣ ಪಡೆಯುವುದೆಂದರೆ ಕೇವಲ ಅನುಕರಣೆಯಾಗುತ್ತದೆ. ಸಹಜವಾಗಿ ಸಂವಹನ ಮಾಡಲು ಅಸಮರ್ಥವಾಗಿದ್ದರೆ, ವಿಷಯವನ್ನು ಗ್ರಹಿಸುವ, ಯೋಚಿಸುವ ಇಲ್ಲವೇ ವಿಶ್ಲೇಷಿಸುವ ಮಾನಸಿಕ ಕಸುವನ್ನು ಮಕ್ಕಳಲ್ಲಿ ಸಜ್ಜುಗೊಳಿಸಲು ಸಾಧ್ಯವಿಲ್ಲ.
ನುಡಿ ಕೌಶಲವಾಗಿ (ಸ್ಕಿಲ್), ಕಸುವಾಗಿ (ಕಂಪಿಟೆನ್ಸ್) ಹಾಗೂ ಗ್ರಹಿಕೆಯಾಗಿ (ಕಂಪ್ರಹೆನ್ಸನ್) ರೂಪುಗೊಂಡಾಗ ಕಲಿಕೆಯೆಂಬುದು ಅರ್ಥಪೂರ್ಣ. ಇದು ಇಂಗ್ಲಿಶಿನ ಮೂಲಕ ಸಾಧ್ಯವೇ ಇಲ್ಲವೆಂದಲ್ಲ. ಆದರೆ ಈ ಅರ್ಥಪೂರ್ಣ ಕಲಿಕೆಗೆ ಬೇಕಾದ ಇಂಗ್ಲಿಶು ವಾತಾವರಣ ಮಕ್ಕಳಿಗಿಲ್ಲಿ ಸಿಗುವುದಿಲ್ಲ.
ಇಂಗ್ಲಿಶು ನುಡಿಯ ಬಗೆಗಿನ ಹಂಬಲಕ್ಕೆ ಕಾರಣಗಳನ್ನು ಹಲವು ಬಗೆಯಲ್ಲಿ ಗುರುತಿಸಬಹುದು; ಇಂಗ್ಲಿಶು ಕಲಿಕೆ ಈ ಲೋಕದ ಬಗೆಗಿನ ನಮ್ಮ ಅರಿವನ್ನು ವಿಸ್ತರಿಸುತ್ತದೆ. ಇದು ಕೇವಲ ಭಾಷೆಯಲ್ಲ ಇದೊಂದು ಗ್ರಹಿಕೆ. ಇಂಗ್ಲಿಶನ್ನು ಮಾತ್ನಾಡುವ ಜನರ ಸಾಮರ್ಥ್ಯವನ್ನು ತಾನು ಸೃಷ್ಟಿಸುವ ಉದ್ಯೋಗಾವಕಾಶದಿಂದ ಅದನ್ನು ಇಮ್ಮಡಿಗೊಳಿಸುತ್ತದೆ.
ಭಾಷೆಯನ್ನು ತಿಳಿದುಕೊಳ್ಳುವುದು ಅತ್ಯಂತ ಆಸಕ್ತಿದಾಯಕ ಸಂಗತಿ. ಯಾವುದೇ ನುಡಿಯ ಜೊತೆಗಿನ ನಂಟಸ್ತಿಕೆ ನಮ್ಮ ಭಾವಪ್ರಪಂಚವನ್ನು ವಿಸ್ತರಿಸುವ ಬಗೆಯಾಗಿದೆ. ಈ ಮಾತು ಎಲ್ಲ ನುಡಿಗಳಿಗೂ ಸಲ್ಲುತ್ತದೆ. ಜಗತ್ತಿನ ಯಾವುದೇ ಮೂಲೆಗೆ ಹೋದರೂ, ಇಂಗ್ಲಿಶು ಮಾತ್ನಾಡುವ ವ್ಯಕ್ತಿಗಳನ್ನು ಕಾಣುತ್ತೇವೆ. ಇಂಗ್ಲಿಶನ್ನು ಒಂದು ಅಧಿಕೃತ ಭಾಷೆಯನ್ನಾಗಿ ಮಾತ್ನಾಡುವ ಯುಕೆ, ಆಸ್ಟ್ರೇಲಿಯಾ, ಅಮೇರಿಕಾ, ಕೆನಡಾ, ಐರ್ಲ್ಯಾಂಡ್, ನ್ಯೂಜಿಲ್ಯಾಂಡ್, ಕೆರಿಬಿಯನ್ ದೇಶಗಳಲ್ಲಿಯೇ ನಾನ್ನೂರು ಮಿಲಿಯನ್ ಸ್ಥಳೀಯ ಭಾಷಿಕರನ್ನು ಗುರುತಿಸುತ್ತೇವೆ.
ಸರಳವಾಗಿ ಹೇಳಬೇಕೆಂದರೆ, ಇಂಗ್ಲಿಶು ಒಂದು ಅಂತರರಾಷ್ಟ್ರೀಯ ಭಾಷೆ. ಈ ಲೋಕದ ಪ್ರಮುಖ ಭಾಷೆಯನ್ನಾಗಿ ಇದನ್ನು ಮಾನ್ಯಮಾಡಲಾಗಿದೆ. ಜಗತ್ತಿನ ಕಾಲುಭಾದಷ್ಟು ಜನರು ಇಂಗ್ಲಿಶು ಒಂದನ್ನೇ ಮಾತ್ನಾಡುತ್ತಾರೆ ಎಂಬಂಶವನ್ನು ಅಂಕಿ-ಅಂಶಗಳು ಹೇಳುತ್ತವೆ. 1.6 ಶತಕೋಟಿ ಜನರು ಕೇವಲ ಶೇಕ್ಸಫಿಯರ್ನ ಮೂಲಕ ಇಂಗ್ಲಿಶನ್ನು ಅರ್ಥಮಾಡಿಕೊಳ್ಳುತ್ತಾರೆ.
ಇಂಗ್ಲಿಶು ಚಲನಚಿತ್ರಗಳನ್ನು ನಿರ್ಮಿಸುವ ಹಾಲಿವುಡ್ ಜಗತ್ತಿನ ದೊಡ್ಡ ಚಲನಚಿತ್ರೋದ್ಯಮವನ್ನು ಹೊಂದಿದೆ. ದಿಟ, ಚೀನಿಯನ್ನು ತಾಯ್ನುಡಿಯನ್ನಾಗಿ ಮಾತ್ನಾಡುವ 3 ಶತಕೋಟಿ ಜನರು ಜಗತ್ತಿನಾದ್ಯಂತ ಹರಡಿಕೊಂಡಿದ್ದಾರೆ. ಇವರಿಗೆ ಹೊರತಾಗಿ ಚೀನಿಯನ್ನು ಬೇರೆಯವರು ಯಾರೂ ಮಾತ್ನಾಡುವುದಿಲ್ಲ ಹಾಗೂ ಕಲಿಯುವ ಆಸಕ್ತಿಯನ್ನೂ ಹೊಂದಿಲ್ಲ. ಅಂತರರಾಷ್ಟ್ರೀಯ ವ್ಯಾಪಾರ ಒಪ್ಪಂದಗಳು ಇಂಗ್ಲಿಶನಲ್ಲಿಯೇ ನಡೆಯುತ್ತವೆ. ಇಂತಹ ವ್ಯವಹಾರಗಳಲ್ಲಿ ವ್ಯಾಪಕವಾಗಿ ಇಂಗ್ಲಿಶು ಮಾತ್ರ ಬಳಕೆಯಾಗುತ್ತದೆ.
ಜಗತ್ತಿನ ಶ್ರೇಷ್ಠ ವಿಶ್ವವಿದ್ಯಾಲಯಗಳಲ್ಲಿ ವಿಶೇಷ ಅಧ್ಯಯನಶಿಸ್ತುಗಳ ಶಿಕ್ಷಣವೂ ಇಂಗ್ಲಿಶಿನಲ್ಲಿಯೇ ನಡೆಯುತ್ತದೆ. ಇಂಗ್ಲಿಶು ಮಾತ್ನಾಡುವ ದೇಶಗಳಲ್ಲಿ ಇಂತಹ ಅವಕಾಶಗಳು ಇನ್ನಷ್ಟು ವ್ಯಾಪಕವಾಗಿ ದೊರೆಯುತ್ತವೆ. ಈ ಎಲ್ಲ ಕಾರಣಗಳಿಗಾಗಿ ಇಂಗ್ಲಿಶಿನ ಬೇಡಿಕೆ ವ್ಯಾಪಕವಾಗಿ ಹರಡಿಕೊಂಡಿದೆ. ಇದೆಲ್ಲದಕ್ಕಿಂತ ಮುಖ್ಯ ಮಾತೇನೆಂದರೆ, ಶಿಕ್ಷಣವು ನಮ್ಮ ಬದುಕುಗಳಿಗೆ ಅತೀ ಮುಖ್ಯ. ಆದರೆ ನಮ್ಮ ಬದುಕಿನ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸುವುದಕ್ಕೆ ಇಂಗ್ಲಿಶಿನಿಂದ ಮಾತ್ರ ಸಾಧ್ಯವೆಂಬ ಕಣ್ಕಟ್ಟು ನಮ್ಮನ್ನು ಆವರಿಸಿಕೊಂಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243



