Connect with us

ದಿನದ ಸುದ್ದಿ

ಮರಳಿ ಸಿರಿ ಧಾನ್ಯ ಬೆಳೆಯಲು ರೈತರು ಮುಂದಾಗಿ : ಕಂದಾಯ ಸಚಿವ ಆರ್.ಅಶೋಕ್

Published

on

ಸುದ್ದಿದಿನ ,ಬೆಂಗಳೂರು ಗ್ರಾಮಾಂತರ ಜಿಲ್ಲೆ : ಸಿರಿ ಧಾನ್ಯಗಳನ್ನು ಉಪಯೋಗಿಸುವುದರಿಂದ ಉತ್ತಮ ಆರೋಗ್ಯದ ಗುಣಮಟ್ಟ ಕಾಪಾಡಿಕೊಳ್ಳಬಹುದಾಗಿದ್ದು, ಮರಳಿ ರೈತರು ಸಿರಿಧಾನ್ಯಗಳನ್ನು ಬೆಳೆಯಲು ಮುಂದಾಗುವಂತೆ ಕಂದಾಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ ಅವರು ಕರೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ ಹಾಡೋನಹಳ್ಳಿ ಇವರ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿಂದು ಏರ್ಪಡಿಸಲಾಗಿದ್ದ “ಕಿಸಾನ್ ಮೇಳ ಮತ್ತು ಸಿರಿಧಾನ್ಯಗಳ ಹಬ್ಬ-2021” ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಹಲವು ವರ್ಷಗಳ ಹಿಂದೆ ಕೃಷಿ ವಿಜ್ಞಾನಿಗಳ ಸಲಹೆ ಮೇರೆಗೆ ರಸಗೊಬ್ಬರವನ್ನು ಬಳಸಲು ಮುಂದಾದ ರೈತರು,‌ ನಂತರ ಆಹಾರ ಉತ್ಪಾದನೆ ಹೆಚ್ಚಾದರೂ ಸಹ ಮಣ್ಣು ತನ್ನ ಸಾರವನ್ನು ಕಳೆದುಕೊಂಡು ಆಹಾರ ಧಾನ್ಯಗಳ ಪ್ರೋಟಿನ್ ಕಳೆದುಕೊಳ್ಳುತ್ತಿದ್ದು, ರೈತರು ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಸಿರಿಧಾನ್ಯಗಳನ್ನು ಬೆಳೆಯುವ ಮೂಲಕ ಜನರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದರು. ಅಲ್ಲದೆ, ಸಿರಿಧಾನ್ಯಗಳು ಹೆಚ್ಚು ಪೌಷ್ಟಿಕಾಂಶವನ್ನು ಹೊಂದಿವೆ ಎಂದು ತಿಳಿಸಿದರು.

ಅನುಭವದ ಆಧಾರದ ಮೇಲೆ ರೈತರು ಕಾರ್ಯನಿರ್ವಹಿಸುತ್ತಿದ್ದು, ರೈತರ ಸಾಂಪ್ರದಾಯಿಕ ಶೈಲಿಯ ಕೃಷಿಯ ಚಕ್ರವನ್ನು ಯಾವ ವಿಜ್ಞಾನಿಗಳು ಕಂಡುಹಿಡಿಯಲು ಸಾಧ್ಯವಿಲ್ಲ ಎಂದರು ಅಲ್ಲದೆ ಮೊದಲು ಮನೆ ಸದಸ್ಯರೆಲ್ಲರೂ ಸೇರಿ ಕೃಷಿ ಕಾರ್ಯ ಮಾಡುತ್ತಿದ್ದರು ಆದರೀಗ, ಕೃಷಿ ಕಾರ್ಯ ಮಾಡುವವರು ಕಡಿಮೆಯಾಗಿದ್ದಾರೆ ಎಂದು ಹೇಳಿದರು.

ಅತಿಯಾಗಿ ಬಳಸುತ್ತಿರುವ ರಸಗೊಬ್ಬರದಿಂದ ಪ್ರಸ್ತುತ ರೈತರು ಸಹ ಅನಾರೋಗ್ಯದಿಂದ ಬಳಲುತ್ತಿದ್ದು, ರೈತರು ಮರಳಿ ಸಿರಿ ಧಾನ್ಯಗಳನ್ನು ಬೆಳೆಯುವಂತಾಗಬೇಕು ಎಂದರು.

ಕೃಷಿ ಇಲಾಖೆ ಅಧಿಕಾರಿಗಳು ಸಿರಿ ಧಾನ್ಯಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು. ಸಿರಿ ಧಾನ್ಯಗಳ ಮಹತ್ವ, ಬೆಳೆಯುವ ರೀತಿಯನ್ನು ರೈತರಿಗೆ ತಿಳಿಸುವ ಮೂಲಕ ಪ್ರೋತ್ಸಾಹಿಸುವ ಕೆಲಸ ಮಾಡಬೇಕಿದೆ ಎಂದರಲ್ಲದೆ, ಸಿರಿ ಧಾನ್ಯಗಳಿಂದ ಹಲವು ರೀತಿಯ ಆಹಾರ ಖಾದ್ಯಗಳನ್ನು ತಯಾರಿಸಬಹುದಾಗಿದ್ದು ರೈತರಿಗೆ ಲಾಭದಾಯಕವಾಗಲಿದೆ ಎಂದು ಹೇಳಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ಅವರು ಮಾತನಾಡಿ ರೈತರು ಬೆಳೆ ಬೆಳೆಯುವ ಮುನ್ನ ಮಣ್ಣಿನ ಪರೀಕ್ಷೆ ಮಾಡಿಸಿ ನಂತರ ಕೃಷಿ ಕಾರ್ಯ ಮಾಡಬೇಕು ಎಂದು ರೈತರಲ್ಲಿ ಮನವಿ ಮಾಡಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಬಳಿ ಚರ್ಚಿಸಬೇಕಿದೆ ಎಂದರಲ್ಲದೆ, ದೊಡ್ಡಬಳ್ಳಾಪುರ ತಾಲ್ಲೂಕಿಗೆ ಜಿಲ್ಲಾ ಆಸ್ಪತ್ರೆಗೆ ಮೂಲಭೂತ ಸೌಕರ್ಯ ಕಲ್ಪಿಸಿ, ಮೇಲ್ದರ್ಜೆಗೆ ಏರಿಸಲು ಈಗಾಗಲೇ 90 ಕೋಟಿ ರೂಪಾಯಿ ನೀಡುವಂತೆ ಆರೋಗ್ಯ ಇಲಾಖೆಯಿಂದ ಮನವಿ ಮಾಡಲಾಗಿದ್ದು, ಬಜೆಟ್‌ನಲ್ಲಿ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಜಿ.ಕೆ.ವಿ.ಕೆ. ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಎಸ್.ರಾಜೇಂದ್ರ ಪ್ರಸಾದ್ ಅವರು ಮಾತನಾಡಿ, ಸ್ವಾತಂತ್ರ್ಯ ನಂತರ ದೇಶದಲ್ಲಿದ್ದ ಆಹಾರದ ಕೊರತೆ ನೀಗಿಸಲು ಬೇರೆ ಬೇರೆ ದೇಶಗಳಿಂದ ಆಹಾರ ಪದಾರ್ಥಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. ಆಗ, ನಮ್ಮಲ್ಲಿ ಆಹಾರ ಧಾನ್ಯಗಳ ಉತ್ಪಾದನೆ ಹೆಚ್ಚಿಸುವ ಸಲುವಾಗಿ, ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನದ ಮೊರೆ ಹೋಗಿ, ಆ ನಿಟ್ಟಿನಲ್ಲಿ ಹಸಿರು ಕ್ರಾಂತಿಯನ್ನು ಸಾಧಿಸಲು ಸಾಧ್ಯವಾಯಿತು ಎಂದರು.

ಕಾರ್ಯಕ್ರಮದಲ್ಲಿ ಸಚಿವರು ರೈತ ಸಾಧಕರನ್ನು ಸನ್ಮಾನಿಸಿದರು. ಕೃಷಿ ಮಳಿಗೆಗಳನ್ನು ಉದ್ಘಾಟಿಸಿ, ವೀಕ್ಷಿಸಿದರು. ಕೃಷಿಗೆ ಸಂಬಂಧಿಸಿದ ಮಾಹಿತಿಯನ್ನು ಒಳಗೊಂಡ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್, ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಅಪ್ಪಯ್ಯಣ್ಣ, ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯೆ ಯಶೋಧಮ್ಮ ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್‌ಕೆ.ನಾಯಕ, ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ, ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಎ.ಪಿ.ಮಲ್ಲಿಕಾರ್ಜುನಗೌಡ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಡಾ.ಅರುಳ್ ಕುಮಾರ್, ತಹಶೀಲ್ದಾರ್ ಶಿವರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending