ದಿನದ ಸುದ್ದಿ

ಫೆಂಗಲ್ ಚಂಡಮಾರುತ | ರಾಜ್ಯದ ವಿವಿಧೆಡೆ ಮಳೆ ; ಕೆಲವು ಜಿಲ್ಲೆಯಲ್ಲಿ ರಜೆ ಘೋಷಣೆ

Published

on

ಸುದ್ದಿದಿನಡೆಸ್ಕ್:ಫೆಂಗಲ್ ಚಂಡಮಾರುತ ಪರಿಣಾಮ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಳಗ್ಗೆಯಿಂದಲೇ ಬೆಂಗಳೂರಿನ ಹಲವೆಡೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ನಗರದಲ್ಲಿ ಚಳಿಯ ವಾತಾವರಣವಿದೆ. ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಫೆಂಗಲ್ ಚಂಡ ಮಾರುತದ ಹಿನ್ನೆಲೆಯಲ್ಲಿ ಮಳೆ ಹಾಗೂ ಶೀತಗಾಳಿಯ ವಾತಾವರಣವಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ರೈತರು ಮುಂಜಾಗ್ರತೆ ವಹಿಸಿ, ಬೆಳೆಗಳನ್ನು ರಕ್ಷಿಸಿಕೊಳ್ಳುವಂತೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಮನವಿ ಮಾಡಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಶಾಲಾ – ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಮೈಸೂರು ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ ಅದೇಶಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ಕುಮಾರ ರಜೆ ಘೋಷಿಸಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನದಿಂದ ನಾಳೆಯವರೆಗೆ ಜಿಲ್ಲೆಯ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಯಶವಂತ್‌ವಿ. ಗುರುಕರ್ ಆದೇಶ ನೀಡಿದ್ದಾರೆ. ಫೆಂಗಲ್ ಚಂಡ ಮಾರುತದ ಪರಿಣಾಮ ದಾವಣಗೆರೆ ಜಿಲ್ಲೆಯಲ್ಲೂ ಜನ ಜೀವನ ಬಾಧಿತಗೊಂಡಿದೆ.

ಕಳೆದ ಮೂರು ದಿನಗಳಿಂದ ಜಿಲ್ಲಾದ್ಯಂತ ಮೋಡ ಮುಸುಕಿದ ವಾತಾವರಣ ಮತ್ತು ಶೀತಗಾಳಿಯಿಂದ ಸಾಮಾನ್ಯ ಜನ ಜೀವನ ಅಸ್ತವ್ಯಸ್ಥಗೊಂಡಿದ್ದು, ಭತ್ತ ಮತ್ತು ಮೆಕ್ಕೆಜೋಳ ಕಟಾವಿಗೂ ಶೀತಗಾಳಿಯಿಂದಾಗಿ ಅಡ್ಡಿ ಉಂಟಾಗಿದೆ. ಕೊಡಗು ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಧಾರಾಕಾರ ಮಳೆಯಾಗುತ್ತಿದೆ. ಅಕಾಲಿಕ ಮಳೆಯಿಂದಾಗಿ ಕಾಫಿ ಹಾಗೂ ಭತ್ತದ ಫಸಲಿಗೂ ಸಮಸ್ಯೆಯಾಗಿದೆ. ಮಳೆಯ ಜೊತೆ ಕೊಡಗಿನಲ್ಲಿ ಚಳಿಯ ವಾತಾವರಣವಿದೆ.

ಫೆಂಗಲ್ ಚಂಡಮಾರುತದಿಂದ ಬೆಂಗಳೂರು ಮತ್ತು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆ ಮಾಹಿತಿಯಂತೆ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಇಂದು ಸಂಜೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ನಾಳೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು, ಹಾಸನ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಗಿರಿಷ್ಠ ತಾಪಮಾನ ಸುಮಾರು 22 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version