ದಿನದ ಸುದ್ದಿ

ಹಬ್ಬಗಳ ಆಚರಣೆ ವೇಳೆ ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು : ಸಿಎಂ ಬೊಮ್ಮಾಯಿ

Published

on

ಸುದ್ದಿದಿನ, ಬೆಂಗಳೂರು : ದೇಶದಲ್ಲಿ ಕೊರೊನಾ 4ನೇ ಅಲೆಯ ಆತಂಕ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ, ಸದ್ಯದ ಕೋವಿಡ್ ಪರಿಸ್ಥಿತಿ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ಆಯಾ ರಾಜ್ಯ ಸರ್ಕಾರಗಳು ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಕೋವಿಡ್ ಸ್ಥಿತಿಗತಿ ನಿರ್ವಹಣೆಯ ಕಾರ್ಯತಂತ್ರದ ಕುರಿತು ಸಮಗ್ರ ಸಮಾಲೋಚನೆ ನಡೆಯಿತು.

ಮುಂಬರುವ ಹಬ್ಬಗಳ ಸರಣಿ ವೇಳೆ ಕೋವಿಡ್ ನಿಯಂತ್ರಣ ಸಂಬಂಧ ಸಮಗ್ರ ಕಾರ್ಯತಂತ್ರ ರೂಪಿಸಲು ನಿರ್ಧರಿಸಲಾಗಿದೆ. ಗೃಹ ಸಚಿವ ಅಮಿತ್ ಶಾ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡಿದ್ದರು. ತಮ್ಮ ರಾಜ್ಯಗಳಲ್ಲಿನ ಪರಿಸ್ಥಿತಿ ಕುರಿತು ಮುಖ್ಯಮಂತ್ರಿಗಳು ಹಾಗೂ ಅಧಿಕಾರಿಗಳು ಪ್ರಧಾನಮಂತ್ರಿ ಅವರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕೋವಿಡ್ 3ನೇ ಅಲೆಯನ್ನು ಯಶಸ್ವಿಯಾಗಿ ತಡೆಯಲಾಗಿದ್ದು, 4ನೇ ಅಲೆಯನ್ನೂ ತಡೆಯಲು ಜನರು ಕೋವಿಡ್ ನಿಯಮಗಳನ್ನು ಪಾಲಿಸುವಂತೆ ನೋಡಿಕೊಳ್ಳಬೇಕು ಎಂದರು.

ಕಳೆದ ಭಾನುವಾರ ಏಪ್ರಿಲ್ 24 ರಂದು ಪ್ರಧಾನಿ ಮೋದಿ ಅವರು ತಮ್ಮ ಮಾಸಿಕ ಮನ್ ಕಿ ಬಾತ್ ಕಾರ್ಯಕ್ರಮದಲ್ಲೂ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜನತೆಗೆ ಸಂದೇಶ ರವಾನಿಸಿದ್ದರು. ಜನತೆ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕರೆ ನೀಡಿದ್ದರು. ರಂಜಾನ್, ಅಕ್ಷಯ ತೃತೀಯ, ಭಗವಾನ್ ಪರಶುರಾಮ ಜನ್ಮ ಜಯಂತಿ, ವೈಶಾಖಾ ಬುದ್ಧ ಪೌರ್ಣಮಿ ಸೇರಿದಂತೆ ದೇಶದ ವಿವಿಧ ಕಡೆ ಸರಣಿ ಹಬ್ಬಗಳ ಆಚರಣೆ ಇರಲಿದೆ.

ಹಬ್ಬಗಳ ಆಚರಣೆ ವೇಳೆ ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವ ಮೂಲಕ, ಸಂಭಾವ್ಯ ನಾಲ್ಕನೇ ಅಲೆಯನ್ನು ಯಶಸ್ವಿಯಾಗಿ ಎದುರಿಸಲು, ಹರಡುವಿಕೆ ತಡೆಯಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version