ದಿನದ ಸುದ್ದಿ
ಮೊದಲನೆ ಸುತ್ತಿನ ‘ಪಲ್ಸ್ ಪೊಲೀಯೋ’ ಕಾರ್ಯಕ್ರಮಕ್ಕೆ ಚಾಲನೆ
ಸುದ್ದಿದಿನ,ಮಂಡ್ಯ : 2019ನೇ ಸಾಲಿನ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಮಂಡ್ಯ ಅರಕೇಶ್ವರ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಇಂದು 5 ವರ್ಷದ ಮಗುವಿಗೆ ಪಲ್ಸ್ ಪೋಲಿಯೋ ಹನಿ ಹಾಕುವುದರ ಮೂಲಕ ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಯಾಲಕ್ಕಿ ಗೌಡ ಅವರು 2019ನೇ ಸಾಲಿನಲ್ಲಿ ಒಂದೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಮಾರ್ಚ್ 10 ರಿಂದ ಮಾರ್ಚ್ 13 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 5 ವರ್ಷದೊಳಪಟ್ಟ ಒಟ್ಟು 1,29,990 ಮಕ್ಕಳಿಗೆ ಲಸಿಕೆ ನೀಡಬೇಕಾಗಿದ್ದು, ಶೇ. 100 ರಷ್ಟು ಸಾಧನೆ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಒಟ್ಟು 723 ಪೋಲಿಯೋ ಬೂತ್‍ಗಳು, 1367 ತಂಡಗಳು, 2453 ಲಸಿಕಾ ಸಿಬ್ಬಂದಿಗಳು, 154 ವಾಹನಗಳನ್ನು ಹಾಗೂ 145 ಮೇಲ್ವಿಚಾರಕರುಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಕೆ.ಆರ್.ಎಸ್, ಮುತ್ತತಿ, ಶಿವನಸಮುದ್ರ, ಸಂಗಮ, ಶಿವನಸಮುದ್ರ ಇಲ್ಲಿಯೂ ಕೂಡ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ತಿಳಿದ ಅವರು ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ಸಿಗೆ ಅಧಿಕಾರಿಗಳು ಅಗತ್ಯ ಕ್ರಮವಹಿಸಿದ್ದಾರೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷರಾದ ಮೀರಾ ಶಿವಲಿಂಗಯ್ಯ ಅವರು ಶೇ. 100 ರಷ್ಟು ಸಾಧನೆ ಮಾಡುವ ಉದ್ದೇಶದಿಂದ ಜಿಲ್ಲಾಡಳಿತ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ಸೌಕರ್ಯವನ್ನು ಒದಗಿಸಿಕೊಟ್ಟಿದ್ದು ಪೋಷಕರು 5 ವರ್ಷದೊಳಗಿನ ತಮ್ಮ ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕಿಸಬೇಕು ಹಾಗೂ ಮಂಡ್ಯ ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ವಿಯಾಗಲಿ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಂಡ್ಯ ವಿಧಾನಸಭಾ ಶಾಸಕರಾದ ಎಂ.ಶ್ರೀನಿವಾಸ್, ನಗರಸಭೆ ಸದಸ್ಯರಾದ ಸೌಭಾಗ್ಯ, ವಿಶಾಲಾಕ್ಷಿ, ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಮಂಚೇಗೌಡ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401