ದಿನದ ಸುದ್ದಿ
ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಬದ್ದ : ಸಿಎಂ ಬಸವರಾಜ ಬೊಮ್ಮಾಯಿ
ಸುದ್ದಿದಿನ,ಶಿವಮೊಗ್ಗ : ಸರ್ಕಾರ ಮತ್ತು ಜನ ಸಾಮಾನ್ಯರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಸದಾ ಬದ್ದವಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲೇ ನಮ್ಮ ರಾಜ್ಯ ಸರ್ಕಾರಿ ನೌಕರರು ದಕ್ಷ ಅಧಿಕಾರಿಗಳೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು ಇದಕ್ಕೆ ಹಲವಾರು ದಶಕಗಳಿಂದ ಸೇವೆ ಸಲ್ಲಿಸಿದ ಹಿರಿಯ ಸರ್ಕಾರಿ ಅಧಿಕಾರಿ/ನೌಕರರ ಶ್ರಮವೂ ಕಾರಣವಾಗಿದೆ. ಅವರನ್ನು ಈ ಸಮಯದಲ್ಲಿ ಸ್ಮರಿಸುತ್ತಾ ಅಭಿನಂದಿಸುತ್ತೇನೆ. ಈ ಪರಂಪರೆ ಹೀಗೇ ಮುಂದುವರೆಸುವ ಕರ್ತವ್ಯ ಮತ್ತು ನೈತಿಕ ಜವಾಬ್ದಾರಿ ನಿಮ್ಮ ಮೇಲಿದೆ. ನಮ್ಮ ಜವಾಬ್ದಾರಿಯನ್ನು ಸ್ಪಷ್ಟವಾಗಿ ತಿಳಿದುಕೊಂಡಲ್ಲಿ ನಮ್ಮ ಕರ್ತವ್ಯಕ್ಕೆ ನ್ಯಾಯ ಒದಗಿಸಬಹುದಾದ್ದರಿಂದ ಆಡಳಿತ ಯಂತ್ರದ ಬಗ್ಗೆ ಸ್ಪಷ್ಟತೆ ಇರಬೇಕು.
ಆಳುವುದೇ ಬೇರೆ ಮತ್ತು ಆಡಳಿತ ಮಾಡುವುದೇ ಬೇರೆ. ಆದ್ದರಿಂದ ನಾವು ಈ ಎರಡರ ನಡುವಿನ ವ್ಯತ್ಯಾಸ ಸ್ಪಷ್ಟಪಡಿಸಿಕೊಳ್ಳಬೇಕು. ನಮ್ಮ ಪಾತ್ರವನ್ನು ನಿಷ್ಟೆಯಿಂದ ನಿರ್ವಹಿಸಿದಲ್ಲಿ ನಾವು ಇಡೀ ರಾಜ್ಯದ ಜನತೆಗೆ ಅಭಿವೃದ್ದಿಯ ಫಲ ನೀಡಲು ಸಾಧ್ಯ.
ಪ್ಯೂನ್‍ನಿಂದ ಹಿಡಿದು ಅಧಿಕಾರಿವರೆಗೆ ತಮ್ಮ ಅಧಿಕಾರವನ್ನು ಜನಪರವಾಗಿ ಬಳಸಬೇಕು. ಕಾನೂನು ಬದ್ದವಾಗಿ ಕೆಲಸ ಮಾಡಬೇಕು. ವಿವೇಚನೆ ಬಳಸುವ ಸಂದರ್ಭದಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿ ಪರವಾಗಿ ಚಿಂತಿಸಿ ನಿರ್ಣಯ ಕೈಗೊಳ್ಳಬೇಕು. ಶ್ರೀಮಂತನ ಪರವಾಗಿ ಅಲ್ಲ. ಬಡವರು, ಜನ ಸಾಮಾನ್ಯರ ಪರವಾದ ನಿರ್ಣಯ ಕೈಗೊಳ್ಳಬೇಕು ಎಂದರು.
ಆಡಳಿತ ಸುಧಾರಣೆ 2ನೇ ಆಯೋಗದಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ತೆಗುಕೊಂಡಿದ್ದೇವೆ. ಬದಲಾಗುತ್ತಿರುವ ಜಾಗತಿಕ ವಿದ್ಯಮಾನಗಳು ಸರ್ಕಾರದ ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರುತ್ತಿದೆ. ಆದ್ದರಿಂದ ನಾವು ಸರ್ಕಾರಿ, ಖಾಸಗಿ ಎಲ್ಲರ ಸಹಭಾಗಿತ್ವದಲ್ಲಿ ಕೆಲಸ ಮಾಡಬೇಕಿದೆ. ಈಗ ನಮ್ಮ ಚಿಂತನೆ, ಕಾರ್ಯವೈಖರಿಗಳು ಬದಲಾಗಬೇಕು.
ಗ್ರಾ.ಪಂ ಯಿಂದ ಹಿಡಿದು ವಿಧಾನಸೌಧದ ವರೆಗೆ ಈ ತಂತ್ರಜ್ಞಾನ ಬಳಕೆಯ ವ್ಯವಸ್ಥೆ ಬಂದಿದೆ. ನೀವು ನಿಗದಿತ ಅವಧಿಯಲ್ಲಿ ಕೈಗೊಳ್ಳುವ ನಿರ್ಧಾರ ನಿಮ್ಮ ಜನಪರ ಕಳಕಳಿಯನ್ನು ತೋರುತ್ತದೆ. ಜನರ ಓಡಾಟ ತಪ್ಪಿಸುತ್ತದೆ, ಭ್ರಷ್ಟರನ್ನಾಗುವುದನ್ನು ತಪ್ಪಿಸುತ್ತದೆ, ಆರೋಪವನ್ನು ತಪ್ಪಿಸುತ್ತದೆ.
ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥೆಯನ್ನು ಅಲ್ಲೋಲ ಕಲ್ಲೋಲ ಮಾಡುತ್ತಿರುತ್ತವೆ. ಅದಕ್ಕೆ ನಾವು ನಮ್ಮ ಸಾಮಾಜಿಕ, ಜನಪರ ಕೆಲಸ, ಕಾರ್ಯಕ್ಷಮತೆಯ ಮೂಲಕ ಉತ್ತರ ನೀಡಬೇಕು. ಅದನ್ನು ನಾನು ನಿಮ್ಮಿಂದ ಬಯಸುತ್ತಿದ್ದೇನೆ. ಬನ್ನಿ ಬದಲಾವಣೆ ಮಾಡೋಣ. ಆಡಳಿತ ಯಂತ್ರದಲ್ಲಿ ಬದಲಾವಣೆ ಮಾಡೋಣ, ಆಳುವ ರೀತಿಯನ್ನು ಬದಲಾಯಿಸೋಣ, ಜನಸಾಮಾನ್ಯರ ಬಳಿಗೆ ವ್ಯವಸ್ಥೆಯನ್ನು ಕೊಂಡೊಯ್ಯೋಣ. ಬಡವರು, ರೈತರು, ದೀನ ದಲಿತರು ಸೇರಿದಂತೆ ಎಲ್ಲರ ಅಭಿವೃದ್ದಿಗಾಗಿ ಸ್ಥಿತಪ್ರಜ್ಞ ಮತ್ತು ಸಮಯಪ್ರಜ್ಞೆಯಿಂದ ಕೆಲಸ ಮಾಡೋಣವೆಂದು ಕರೆ ನೀಡಿದರು.
ಸಂಸದರಾದ ಬಿ.ವೈ.ರಾಘವೇಂದ್ರ ಮಾತನಾಡಿ, ನಮ್ಮ ರಾಜ್ಯ ಘನ ಸರ್ಕಾರವು ಸರ್ಕಾರಿ ನೌಕರರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವಂತಹ ವೇತನ ಮತ್ತು ಸೌಲಭ್ಯಗಳನ್ನು ನೀಡಿದೆ. ಕಾನೂನು ರೂಪಿಸುವವರು ನಾವಾದರೂ ಅದನ್ನು ಜಾರಿಗೆ ತರುವ ಜವಾಬ್ದಾರಿ ನಿಮ್ಮ ಮೇಲಿದೆ. ಸಾಕಷ್ಟು ಅಭಿವೃದ್ದಿ ಕಾರ್ಯಗಳಾದ ಬಗ್ಗೆ ಹೆಮ್ಮ, ಗೌರವ ಸಲ್ಲುತ್ತಿರುವುದು ಕೂಡ ನಿಮ್ಮ ಪರಿಶ್ರಮದಿಂದ ಎಂದ ಹೇಳಬಯಸುತ್ತೇನೆ.
ಸರ್ಕಾರದ ಕೆಲಸ ದೇವರ ಕೆಲಸವಾಗಿದ್ದು ಎಲ್ಲರೂ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕೂಡ ನ್ಯಾಯ ಒದಗಿಸಬೇಕು. ನಾವೆಲ್ಲ ಸೇರಿ ಸರ್ವಾಂಗೀಣ ಅಭಿವೃದ್ದಿ ಮಾಡೋಣ ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಷಡಾಕ್ಷರಿ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದಲ್ಲಿ 6 ಲಕ್ಷ ಸರ್ಕಾರಿ ನೌಕರರಿದ್ದು, ದೇಶದಲ್ಲೇ ಪ್ರಥಮವಾಗಿ ರಾಜ್ಯದಲ್ಲಿ ಸರ್ಕಾರಿ ನೌಕರರ ದಿನಾಚರಣೆ ಘೋಷಿಸಿರುವ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿರವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ 31 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಸರ್ಕಾರಿ ನೌಕರರ ದಿನಾಚರಣೆ ಮತ್ತು ಸರ್ವೋತ್ತಮ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.
ಸರ್ಕಾರಿ ನೌಕರರು ಅನೇಕ ಒತ್ತಡಗಳು, ಸಮಸ್ಯೆಗಳು ಮತ್ತು ಸವಾಲುಗಳ ನಡುವೆಯೂ ತಮ್ಮ ಜವಾಬ್ದಾರಿಯನ್ನು ದಕ್ಷತೆಯಿಂದ ನಿರ್ವಹಿಸುತ್ತಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ನಮ್ಮ ಮನವಿಗಳಿಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಕೇಂದ್ರಕ್ಕೆ ಸಮಾನ ವೇತನ ನೀಡಲು ವೇತನ ಆಯೋಗ ರಚನೆ ಸೇರಿದಂತೆ ನೌಕರರ ಹಿತರಕ್ಷಕರಾಗಿರುವ ಅವರಿಗೆ ಎಲ್ಲ ನೌಕರರ ಪರವಾಗಿ ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಉನ್ನತ ಶಿಕ್ಷಣ,ಮಾಹಿತಿ ತಂತ್ರಜ್ಞಾನ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ.ಅಶ್ವಥನಾರಾಯಣ, ಮಾಜಿ ಉಪಮುಖ್ಯಮಂತ್ರಿಗಳು ಮತ್ತು ಶಾಸಕರಾದ ಲಕ್ಷ್ಮಣ ಸವದಿ, ಶಾಸಕ ಅಶೋಕ್‍ನಾಯ್ಕ್ ಎಂಎಡಿಬಿ ಅಧ್ಯಕ್ಷರಾದ ಗುರುಮೂರ್ತಿ, ಕಾಡಾ ಅಧ್ಯಕ್ಷರಾದ ಪವಿತ್ರ ರಾಮಯ್ಯ, ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿ.ಪಂ ಸಿಇಓ ಎಂ.ಎಲ್.ವೈಶಾಲಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಮತ್ತು ತಾಲ್ಲೂಕು ಶಾಖೆ ಪದಾಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


