ದಿನದ ಸುದ್ದಿ
ಅತಿಥಿ ಉಪನ್ಯಾಸಕರಿಗೆ ವಂಚನೆ: ಹನುಮಂತಗೌಡ ಕಲ್ಮನಿ ಸಹಚರರ ವಿರುದ್ಧ ಎಫ್ ಐ ಆರ್ ದಾಖಲು
ಸುದ್ದಿದಿನಡೆಸ್ಕ್:ಅತಿಥಿ ಉಪನ್ಯಾಸಕರಿಗೆ ಕೆಲಸ ಖಾಯಂಗೊಳಿಸಿ ಕೊಡುವುದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡಿರುವುದಾಗಿ ಆರೋಪಿಸಿ ಅತಿಥಿ ಉಪನ್ಯಾಸಕ ಸಂಘದ ಅಧ್ಯಕ್ಷ ಹನುಮಂತ ಗೌಡ ಕಲ್ಮನಿ, ಕಾರ್ಯದರ್ಶಿ ಪೀಟರ್ ವಿನೋದ್ ಚಂದ್, ಶಾಲಿನಿ ನಾಯ್ಕ, ಧಾರವಾಡದ ಆಳ್ನಾವರ ಶಾಖೆಯ ಸೆಂಟ್ ಮೆಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮ್ಯಾನೇಜರ್ ವಿರುದ್ಧ ದೂರು ದಾಖಲಾಗಿದೆ.
ಕೆಲಸ ಖಾಯಂಗೊಳಿಸುವುದಾಗಿ ನಂಬಿಸಿ ಮೂರು ಲಕ್ಷದ ಐವತ್ತು ಸಾವಿರ ರೂಗಳನ್ನು ಕೆನೆರಾ ಬ್ಯಾಂಕಿನ
ಸೆಂಟ್ ಮೆಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮ್ಯಾನೇಜರ್ ಅವರ ಕರೆಂಟ್ ಅಕೌಂಟಿಗೆ 2023 ನೇ ಇಸವಿಯಲ್ಲಿ ಹಣವನ್ನು ಜಮಾಮಾಡಿಸಿಕೊಂಡು ಮೋಸ ಮಾಡಿರುವುದಾಗಿ ಆರೋಪಿಸಿ ಅತಿಥಿ ಉಪನ್ಯಾಸಕ ಗಣಪತಿ ಎಸ್.ಎಂ ಅವರು ಆಗಸ್ಟ್ 25 ರಂದು ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅತಿಥಿ ದ್ರೋಹ
ಹಲವಾರು ವರ್ಷಗಳಿಂದ ಅತಿಥಿ ಉಪನ್ಯಾಸಕ ವೃತ್ತಿಯನ್ನೇ ನಂಬಿಕೊಂಡು ಬದುಕುತ್ತಿರುವವರ ಅತಂತ್ರ ಬದುಕನ್ನು ಅಸ್ತ್ರವಾಗಿ ಬಳಸಿಕೊಂಡ ಅತಿಥಿ ಉಪನ್ಯಾಸಕ ಸಂಘದ ರಾಜ್ಯಾಧ್ಯಕ್ಷನಾದ ಹನುಮಂತಗೌಡ ಕಲ್ಮನಿ ಹಾಗೂ ಆತನ ಸಂಗಡಿಗರು ತಮ್ಮ ನೌಕರಿಯನ್ನು ಖಾಯಂಗೊಳಿಸುವುದಾಗಿ ನಂಬಿಸಿ ನೂರಾರು ಆಕಾಂಕ್ಷಿಗಳಿಂದ ಲಕ್ಷಾಂತರ ರೂಪಾಯಿ ವಸೂಲಿ ಮಾಡಿ, ವಂಚಿಸಿರುವ ಘಟನೆ ಎಫ್.ಐ.ಆರ್ ಮೂಲಕ ಬೆಳಕಿಗೆ ಬಂದಿರುತ್ತದೆ.
ಸಾಗರ ನಿವಾಸಿಯಾಗಿರುವ ಗಣಪತಿ ಎಸ್.ಎಂ ಎಂಬ ಅತಿಥಿ ಉಪನ್ಯಾಸಕರು ಸುಮಾರು 12 ವರ್ಷಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸಿ, ತಮ್ಮ ಬದುಕಿನಲ್ಲಿ ಸಾಕಷ್ಟು ಸಂಕಷ್ಟಗಳನ್ನು ಅನುಭವಿಸಿದ್ದರಿಂದ ಖಾಯಂ ನೌಕರಿಯ ಮೋಸದ ಜಾಲಕ್ಕೆ ಸಿಲುಕಿ 3.50.000 ರೂಪಾಯಿಗಳನ್ನು ಕಳೆದುಕೊಂಡು ದಿಕ್ಕು ತೋಚದೆ ಇರುವಾಗ ಪೊಲೀಸ್ ಸಾಗರ ಸ್ಟೇಷನ್ ಮೆಟ್ಟಿಲೇರಿದ್ದಾರೆ. ಇವರೊಂದಿಗೆ ಮೋಸದ ಜಾಲಕ್ಕೆ ಸಿಲುಕಿ ಹಣ ಕಳೆದುಕೊಂಡ ಅನುಷಾ ಎಲ್.ವಿ, ಅಶೋಕ ಎಚ್, ಭವ್ಯ ವಿ, ಕೌಶಿಕ್ ಕೆ ಎಂಬುವವರು ಸೇರಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಹನುಮಂತಗೌಡ ಕಲ್ಮನಿ, ಪೀಟರ್ ವಿನೋದ್‌ಚಂದ್ ಕೆ, ಶ್ರೀಮತಿ ಶಾಲಿನಿ ನಾಯಕ ಹಾಗೂ ಮ್ಯಾನೇಜರ್ ಸೆಂಟ್ ಮಿಲಾಗ್ರಿಸ್ ಕೋ ಅಪರೇಟಿವ್ ಸೊಸೈಟಿ, ಆಳ್ನಾವರ ಇವರ ವಿರುದ್ಧ ಭಾರತೀಯ ದಂಡ ಸಂಹಿತೆ 1860 ಸೆಕ್ಷನ್ 420 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಅತಿಥಿ ಉಪನ್ಯಾಸಕರ ವಿವಿಧ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹಲವಾರು ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಸಂಘದ ಅಧ್ಯಕ್ಷರಾದ ಡಾ.ಹನುಮಂತಗೌಡ ಕಲ್ಮನಿ ಮತ್ತು ಆತನ ಸಹಚರರು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಚರ್ಚಿಸಲು ಕಡೂರು, ಶಿರಸಿ, ಹುಬ್ಬಳಿ ಮುಂತಾದ ಕಡೆಗಳಲ್ಲಿ ಹಲವಾರು ಸಭೆಗಳನ್ನು ಆಯೋಜಿಸಿ, ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಲು ರಾಜಕಾರಣಿಗಳು ಹಾಗೂ ಅಧಿಕಾರಿಗಳಿಗೆ ಹಣ ನೀಡದ ಹೊರತು ಖಾಯಂ ಸಾಧ್ಯವಿಲ್ಲ ಎಂಬುದಾಗಿ ನಂಬಿಸಿ, ಪ್ರತಿಯೊಬ್ಬ ಅತಿಥಿ ಉಪನ್ಯಾಸಕರು ಇದಕ್ಕೆ ಸಹಕಾರ ನೀಡಬೇಕು ಎಂಬುದಾಗಿ ಉತ್ತೇಜಿಸಿರುತ್ತಾರೆ. ಇದಕ್ಕೆ ಕೆಲವರು ಸಂಶಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ನಿಮ್ಮ ಹಣ ಸುರಕ್ಷಿತವಾಗಿರುತ್ತದೆ ಎಂಬ ಭರವಸೆ ನೀಡಿ ಸೆಂಟ್ ಮಿಲಾಗ್ರಿಸ್ ಕೋ ಅಪರೇಟಿವ್ ಸೊಸೈಟಿ, ಆಳ್ನಾವರ ಇವರ ಚಾಲಿ ಖಾತೆಗೆ ಹಣವನ್ನು ಅಭ್ಯರ್ಥಿಗಳಿಂದ ನೇರವಾಗಿ ವರ್ಗಾಯಿಸಿಕೊಂಡಿರುತ್ತಾರೆ.
ಕೋ ಅಪರೇಟಿವ್ ಸೊಸೈಟಿಯ ಮೇಲೆ ಭರವಸೆ ಇಟ್ಟ ನೂರಾರು ಅತಿಥಿ ಉಪನ್ಯಾಸಕರು ತಲಾ ಮೂರು ಲಕ್ಷಕ್ಕೂ ಅಧಿಕ ಮೊತ್ತವನ್ನು ಹನುಮಂತಗೌಡ ಕಲ್ಮನಿ ಮತ್ತು ಸಂಗಡಿಗರು ಸೂಚಿಸಿದ ಖಾತೆಗೆ ಹಣವನ್ನು ವರ್ಗಾಹಿಸಿ ಖಾಯಂ ನೌಕರಿಯ ಕನಸೊತ್ತು ತೇಲಾಡುತ್ತಿರುತ್ತಾರೆ. ಆದರೆ ವರ್ಷಗಳೇ ಕಳೆಯುತ್ತ ಬಂದರೂ ಖಾಯಂ ನೌಕರಿಯ ಪ್ರಸ್ತಾಪ ಬರದೆ ಹೋದಾಗ ಅಧ್ಯಕ್ಷರ ಮೇಲೆ ಒತ್ತಡಗಳು ಬಂದಾಗ ಅಂದಿನ ಬಿಜೆಪಿ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥನಾರಾಯಣ ಹಾಗೂ ಆಯುಕ್ತರು ಸಂಪೂರ್ಣ ಭರವಸೆ ನೀಡಿದ್ದಾರೆ. ನೀತಿ ಸಂಹಿತೆ ಮುಕ್ತಾಯವಾದ ನಂತರ ಆದೇಶ ಪ್ರತಿ ನೀಡುವುದಾಗಿ ನಂಬಿಸಿರುತ್ತಾರೆ. ನಂತರ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ ತರುವಾಯ ಕಾಂಗ್ರೇಸ್ ಪಕ್ಷದ ಮುಖಂಡರ ಜೊತೆ ಪೋಟೊ ಕ್ಲಿಕ್ಕಿಸಿಕೊಂಡು ಖಾಯಮಾತಿ ವಿಚಾರ ಪ್ರಸ್ತಾಪ ಮಾಡಿರುವುದಾಗಿ, ಕಾಂಗೇಸ್ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಶ್ರೀ ಸುಧಾಕರ್ ಹಾಗೂ ಆಯುಕ್ತರಾದ ಜಗದೀಶ್ ಅವರಿಗೆ ಹಣವನ್ನು ತಲುಪಿಸಿದ್ದೇವೆ. ಶೀಘ್ರವೇ ಖಾಯಂ ಮಾಡುವುದಾಗಿ ಭರವಸೆ ನೀಡುವುದಾಗಿ ತಿಳಿಸುತ್ತಲೇ ನೂರಾರು ಆಕಾಂಕ್ಷಿಗಳನ್ನು ವಂಚಿಸಿಕೊಂಡು ಬಂದಿರುತ್ತಾರೆ.
ಅಧ್ಯಕ್ಷ ಮತ್ತು ಅವರ ಸಂಗಡಿಗರ ಮಾತಿನ ಮೇಲಿನ ವಿಶ್ವಾಸವನ್ನು ಕಳೆದುಕೊಂಡ ನೊಂದ ಅತಿಥಿ ಉಪನ್ಯಾಸಕರಾದ ಗಣೇಶ್ ಕೆ.ಎಸ್, ಗಣಪತಿ ಎಸ್.ಎಂ ಅವರುಗಳನ್ನೊಳಗೊಂಡ 18 ಜನ ಅತಿಥಿ ಉಪನ್ಯಾಸಕರು ವಕೀಲರ ಮೂಲಕ ದಿನಾಂಕ: 03ಮೇ 2024 ರಂದು ಹನುಮಂತಗೌಡ ಕಲ್ಮನಿ ಹಾಗೂ ಇತರರ ವಿರುದ್ಧ 58 ಲಕ್ಷದ 50ಸಾವಿರ ರೂಪಾಯಿಗಳ ವಂಚನೆಗೆ ಸಂಬಂಧಿಸಿದಂತೆ ಲೀಗಲ್ ನೋಟಿಸ್ ಜಾರಿಗೊಳಿಸಿರುತ್ತಾರೆ. ನೋಟಿಸ್ ಜಾರಿಗೊಳಿಸಿದ ಅತಿಥಿ ಉಪನ್ಯಾಸಕರಿಗೆ ಕಲ್ಮನಿ ಹಾಗೂ ಆತನ ಇತರ ಸಹಚರರು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ದಿನಾಂಕ ಇದೇ ಆಗಸ್ಟ್ 25 ರಂದು ಗಣಪತಿ ಎಸ್.ಎಂ ಹಾಗೂ ಇತರರು ಪೊಲೀಸ್ ಸಾಗರ ಠಾಣೆಯ ಮೆಟ್ಟಿಲೇರಿ ಹನುಮಂತಗೌಡ ಕಲ್ಮನಿ ಹಾಗೂ ಇತರರ ವಿರುದ್ಧ ದೂರು ದಾಖಲಿಸಿರುತ್ತಾರೆ.
ಅತಿಥಿ ಉಪನ್ಯಾಸಕರಿಗೆ ನ್ಯಾಯ ಕೊಡಿಸುವುದಾಗಿ ಅವರ ಬೆಂಬಲ ಪಡೆದು, ತಮ್ಮ ವರ್ಚಸ್ಸನ್ನು ಹೆಚ್ಚಿಸಿಕೊಂಡಿರುವ ಅಧ್ಯಕ್ಷ ಹಾಗೂ ಆತನ ಸಹಚರರು ನೂರಾರು ಅತಿಥಿ ಉಪನ್ಯಾಸಕರಿಗೆ ವಂಚಿಸಿ, ಅವರನ್ನು ಬೀದಿಗೆ ತಂದು ನಿಲ್ಲಿಸಿರುತ್ತಾರೆ. ಇವರ ಈ ವಂಚನೆಗೆ ಇನ್ನೆಷ್ಟು ಜನ ಅತಿಥಿಗಳು ಬಲಿಯಾಗಿದ್ದಾರೋ ವಿಚಾರಣೆಯ ನಂತರ ಬಯಲಿಗೆ ಬರಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.




