ದಿನದ ಸುದ್ದಿ
ಹರಿಹರ | ಶೇರಾಪುರ ವಸತಿ ಯೋಜನೆ ಪ್ರಗತಿ-ಇನ್ನಾರು ತಿಂಗಳಲ್ಲಿ ಲೋಕಾರ್ಪಣೆ: ಸಚಿವ ವಿ.ಸೋಮಣ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಹರಿಹರ ತಾಲ್ಲೂಕಿನ ಶೇರಾಪುರದಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ 49.11 ಎಕರೆ ವಿಸ್ತೀರ್ಣದಲ್ಲಿ ಅಭಿವೃದ್ದಿಪಡಿಸಲಾಗುತ್ತಿರುವ ವಸತಿ ಯೋಜನೆ ಕಾಮಗಾರಿ ಇನ್ನು 6 ತಿಂಗಳಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿದೆ ಎಂದು ವಸತಿ ಸಚಿವರಾದ ವಿ.ಸೋಮಣ್ಣ ತಿಳಿಸಿದರು.
ಭಾನುವಾರ ಹರಿಹರ ತಾಲ್ಲೂಕಿನ ಶೇರಾಪುರ ಪ್ರದೇಶದಲ್ಲಿ ನಡೆಯುತ್ತಿರುವ ನಿವೇಶನ ಕಾಮಗಾರಿಯನ್ನು ಸಂಸದರು, ಶಾಸಕರೊಂದಿಗೆ ಪರಿಶೀಲಿಸಿದ ನಂತರ ಮಾತನಾಡಿದ ಅವರು ಶೇರಾಪುರದಲ್ಲಿ ಅಭಿವೃದ್ದಿಪಡಿಸಲಾಗುತ್ತಿರುವ ಲೇಔಟ್ ಇನ್ನು ಆರು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು ಸಂಸದರು, ಶಾಸಕರ ಸಮ್ಮುಖದಲ್ಲಿ ಉದ್ಘಾಟಿಸಲಾಗುವುದು ಎಂದರು.
ಕರ್ನಾಟಕ ಗೃಹ ಮಂಡಳಿ ವತಿಯಿಂದ ಹರಿಹರ ತಾಲ್ಲೂಕಿನ ಶೇರಾಪುರದಲ್ಲಿ ಸುಮಾರು 49 ಎಕರೆ 11 ಗುಂಟೆ ವಿಸ್ತೀರ್ಣದಲ್ಲಿ ನಿವೇಶನ ಮತ್ತು ವಸತಿ ಸಮುಚ್ಚಯ ನಿರ್ಮಿಸಲು ಲೇಔಟ್ ಅಭಿವೃದ್ದಿಪಡಿಸಲಾಗುತ್ತಿದೆ. ಮೈಸೂರಿನ ಮೆ|| ಕೆ.ವಿ.ಸಿ.ಹೆಚ್.ಎಸ್.ಆರ್ ಎಂಬ ಗುತ್ತಿಗೆದಾರರು ಸುಮಾರು ರೂ.25.05 ಕೋಟಿ ಮೊತ್ತದಲ್ಲಿ 2021 ರ ಜನವರಿ 18 ರಿಂದ ಈ ನಿವೇಶನಗಳನ್ನು ಅಭಿವೃದ್ದಿಪಡಿಸುವ ಕಾಮಗಾರಿಯನ್ನು ಕೈಗೊಂಡಿದ್ದಾರೆ. ಡಿಸೆಂಬರ್ ವೇಳೆಗೆ ಈ ಕಾಮಗಾರಿ ಪೂರ್ಣಗೊಳ್ಳಲಿದೆ.
ಈ ಪ್ರದೇಶದಲ್ಲಿ 20*30, 30*40, 60*40 ವಿಸ್ತೀರ್ಣದಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು. ಬಿಪಿಎಲ್ ಕಾರ್ಡ್ ಹೊಂದಿರುವವರು, ಸ್ಥಳೀಯರು ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ 20*30 ರ ನಿವೇಶನಗಳನ್ನು ಅರ್ಧ ದರಕ್ಕೆ ಹಂಚಿಕೆ ಮಾಡಲಾಗುವುದು. ಸೇವಾ ಉದ್ದೇಶದಿಂದ ನಿವೇಶನ ಅಭಿವೃದ್ದಿಸಲಾಗುತ್ತಿದ್ದು 24*7 ಕುಡಿಯುವ ನೀರು ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗುವುದು. ಇದೊಂದು ಪ್ರತಿಷ್ಟಿತ ಬಡಾವಣೆಯಾಗಲಿದ್ದು ಒಟ್ಟು 650 ನಿವೇಶನಗಳನ್ನು ಮಾಡಲಾಗುವುದು. ಆದರೆ ಈಗಾಗಲೇ 33 ಸಾವಿರ ಅರ್ಜಿಗಳು ಬಂದಿವೆ ಎಂದು ಮಾಹಿತಿ ನೀಡಿದರು.
ಕಾನೂನು ಚೌಕಟ್ಟಿನಲ್ಲೇ ನಿಯಮಾನುಸಾರ ಲೇಔಟ್ ಅಭಿವೃದ್ದಿಪಡಿಸಲಾಗುತ್ತಿದೆ. ಆದರೆ ಅಕ್ಕಪಕ್ಕದ ಕೆಲ ರೈತರು ತಮ್ಮ ತೋಟ ಮತ್ತು ಹೊಲಗಳಿಗೆ ಲೇಔಟ್ ಎತ್ತರವಾಗುವ ಕಾರಣ ತಮ್ಮ ಜಮೀನಿನಲ್ಲಿ ಮಳೆ ನೀರು ನಿಂತು ಶೀತಬಾಧೆ ಕಾಡಲಿದೆ. ಆದ ಕಾರಣ ಕಾಲುವೆ ನಿರ್ಮಿಸಿ ನೀರು ಹೋಗುವಂತೆ ವ್ಯವಸ್ಥೆ ಮಾಡಿಕೊಡಲು ಮನವಿ ಮಾಡಿದ್ದಾರೆ. ಆ ಪ್ರಕಾರವೇ ಅಕ್ಕಪಕ್ಕದ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ವ್ಯವಸ್ಥೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.
ಹಾಗೂ ಲೇಔಟ್ ವ್ಯಾಪ್ತಿಯಲ್ಲಿ ರಸ್ತೆ, ಪಾರ್ಕುಗಳು, ಅಂಗನವಾಡಿ ಕೇಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಾಥಮಿಕ ಶಾಲೆಯನ್ನೂ ತೆರೆÀಯಲು ಕ್ರಮ ವಹಿಸಲು ಸೂಚಿಸಿದ್ದೇನೆ ಎಂದ ಅವರು ಕರ್ನಾಟಕ ಗೃಹ ಮಂಡಳಿ, ರಾಜೀವ್ ಗಾಂಧಿ ಆವಾಸ್ ಯೋಜನೆ, ಕೊಳಚೆ ಅಭವೃದ್ದಿ ಮಂಡಳಿಯಡಿ ವಸತಿ ಯೋಜನೆಗಳಿಗೆ ಚಾಲನೆ ಸಿಕ್ಕಿದ್ದು ಕೆಲಸಗಳು ಆಗುತ್ತಿವೆ ಎಂದರು.
ನಿರ್ಬಂಧದ ಬಗ್ಗೆ ಜೂ.7 ರ ನಂತರ ನಿರ್ಧಾರ
ಜೂನ್ 7 ರವರೆಗೆ ಈಗ ಇರುವ ನಿರ್ಬಂಧಗಳು ಚಾಲ್ತಿಯಲ್ಲಿರುತ್ತವೆ. ಪ್ರಸ್ತುತ ಶೇ.10 ರಷ್ಟು ಕೋವಿಡ್ ಪ್ರಕರಣ ಕಡಿಮೆ ಆಗಿದೆ. ಇನ್ನೂ ಕಡಿಮೆ ಆಗಬೇಕು. ಮಾನ್ಯ ಮುಖ್ಯಮಂತ್ರಿಯವರು ಜೂನ್ 7 ರ ನಂತರ ನಿರ್ಬಂಧಗಳನ್ನು ಮುಂದುವರೆಸಬೇಕಾ ಅಥವಾ ಬೇಡವಾ ಎಂಬ ಬಗ್ಗೆ ಪರಿಸ್ಥಿತಿ ನೋಡಿ ನಿರ್ಧಾರ ಕೈಗೊಳ್ಳುವರು. ಎಲ್ಲರೂ ಈ ಮಹಾಮಾರಿಯನ್ನು ಹಿಮ್ಮೆಟ್ಟಿಸಲು ಶ್ರಮಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಒಂದು ವಾರ ಕಾಲ ಮನೆಯಲ್ಲಿಯೇ ಇರಿ. ಪ್ರಕರಣ ಇಳಿಮುಖವಾದರೆ ನಿರ್ಬಂಧ ಸಡಿಲಿಕೆ ಆಗಬಹುದು. ಆದ ಕಾರಣ ಜನರು ಸಮಸ್ಯೆ ಅರಿತು ಸಹಕರಿಸಬೇಕೆಂದು ಮನವಿ ಮಾಡಿದರು.
ಈ ವೇಳೆ ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ, ಹರಿಹರ ಕ್ಷೇತ್ರದ ಶಾಸಕರಾದ ರಾಮಪ್ಪ, ಮಾಜಿ ಶಾಸಕ ಬಿ.ಪಿ.ಹರೀಶ್, ಕರ್ನಾಟಕ ಗೃಹ ಮಂಡಳಿಯ ಮುಖ್ಯ ಅಭಿಯಂತರ ನಂಜುಂಡಸ್ವಾಮಿ ಟಿ.ಡಿ, ಕಾರ್ಯಪಾಲಕ ಅಭಿಯಂತರ ರವೀಂದ್ರ ಎಸ್.ಎನ್, ಜ್ಯೂನಿಯರ್ ಇಂಜಿನಿಯರ್ ಪ್ರಿಯಾ.ಕೆ.ಎ, ಇತರೆ ಅಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


