ದಿನದ ಸುದ್ದಿ
ಮಳೆ ಅವಾಂತರ ; ಜಿಲ್ಲಾಧಿಕಾರಿಗಳಿಗೆ ಕಟ್ಟೆಚ್ಚರವಹಿಸುವಂತೆ ಎಚ್.ಡಿ.ಕೆ ಸೂಚನೆ
ಸುದ್ದಿದಿನ ಡೆಸ್ಕ್ | ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವ ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ.
ಈ ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳು ಮಳೆಯಿಂದ ಸಂಭವಿಸಬಹುದಾದ ಪ್ರವಾಹ, ಭೂ ಕುಸಿತ ಮತ್ತಿತರ ಅನಾಹುತಗಳ ಕುರಿತು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅಂತೆಯೇ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿ,ಮಳೆ ಹಾನಿ ಕುರಿತು ನಿಗಾ ವಹಿಸುವಂತೆ ತಿಳಿಸಿದ್ದಾರೆ.
ಹವಾಮಾನ ಇಲಾಖೆಯ ಮಾಹಿತಿಯಂತೆ ಕೊಡಗು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಈ ಪ್ರದೇಶದಲ್ಲಿ ಹೆಚ್ಚಿನ ಮುಂಜಾಗ್ರತೆ ಕೈಗೊಳ್ಳಲು ಆಯಾ ಜಿಲ್ಲಾ ಆಡಳಿತಕ್ಕೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಜಾಗರೂಕರಾಗಿ ಇರಬೇಕೆಂದು ವಿನಂತಿ ಮಾಡಲಾಗಿತ್ತು.