ದಿನದ ಸುದ್ದಿ
ಹಾವೇರಿ | ಪರಿಹಾರ ಕಾರ್ಯಕ್ಕಾಗಿ ಜಿಲ್ಲೆಯ ವಿಪತ್ತು ನಿಧಿಯಲ್ಲಿ ರೂ.16 ಕೋಟಿ ಹಣವಿದೆ : ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ
ಸುದ್ದಿದಿನ,ಹಾವೇರಿ: ಜಿಲ್ಲಾ ವಿಪತ್ತು ನಿಧಿಯಲ್ಲಿ 16 ಕೋಟಿ ರೂ, ತಾಲೂಕಾ ಆಡಳಿತ ಬಳಿ 15 ರಿಂದ 20 ಲಕ್ಷ ರೂ. ಹಣವಿದ್ದು, ಸಂತ್ರಸ್ಥರ ನೆರವಿಗೆ ಜಿಲ್ಲಾಡಳಿತ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದರು.
ಅತಿವೃಷ್ಠಿ ಹಾಗೂ ನೆರೆ ಪರಿಹಾರ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು ಸಂತ್ರಸ್ತರಿಗಾಗಿ ಜಿಲ್ಲೆಯಲ್ಲಿ 76 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿ ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಪರಿಹಾರ ಕಾರ್ಯಾಚರಣೆ ಮುಂದುವರೆದಿದೆ. ಮಳೆ ಹಾಗೂ ನೆರೆಯ ಸಂಕಷ್ಟದಲ್ಲಿರುವವರು ಪರಿಹಾರ ಕೇಂದ್ರಕ್ಕೆ ಆಗಮಿಸಿ ಆಶ್ರಯಪಡೆಯುವಂತೆ ತಿಳಿಸಿದರು.
ಆಗಸ್ಟ್ 8 ಮತ್ತು 9 ರಂದು 591.7 ಎಂ ಎಂ ಹಾಗೂ 9 ರಿಂದ 10 ರಂದು 224.3 ಎಂ.ಎಂ. ಮಳೆಯಾಗಿದೆ. ತುಂಗಭದ್ರಾ ನದಿಯಿಂದ 1.15 ಲಕ್ಷ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ವರದಾ ನದಿಯಿಂದ 32 ಕ್ಯೂಸೆಕ್ ಮತ್ತು ಧರ್ಮಾ ನದಿಯಿಂದ ಐದುಸಾವಿರ ಕ್ಯೂಸೆಕ್ ನೀರು ಹರಿದುಬಂದಿರುವುದರಿಂದ ನದಿಪಾತ್ರದ ಗ್ರಾಮಗಳಿಗೆ ನೆರೆ ತುಂಬಲು ಕಾರಣವಾಗಿ ಹಾನಿ ಹೆಚ್ಚಾಗಿದೆ. ಹಾನಗಲ್ ತಾಲೂಕಿನ ನಾಲ್ಕು ಗ್ರಾಮಗಳು, ಸವಣೂರ ತಾಲೂಕಿನ ನಾಲ್ಕ ಗ್ರಾಮಗಳು ಸಂಪರ್ಕ ಕಳೆದುಕೊಂಡಿದ್ದವು. ಉಳಿದಂತೆ ಗ್ರಾಮಗಳಲ್ಲಿ ಭಾಗಶಃ ನೀರು ತುಂಬಿಹಾನಿ ಸಂಭವಿಸಿದೆ. ಸಂತ್ರಸ್ಥ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪರಿಹಾರ ಕೇಂದ್ರ
76 ಗ್ರಾಮಗಳು ಬಾಧಿತವಾಗಿದ್ದು, 6493 ಜನರನ್ನು ಸ್ಥಳಾಂತರಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಹಾವೇರಿಯಲ್ಲಿ 53, ರಾಣೇಬೆನ್ನೂರಿನಲ್ಲಿ ಎರಡು, ಬ್ಯಾಡಗಿಯಲ್ಲಿ ಎರಡು, ಸವಣೂರಿನಲ್ಲಿ ನಾಲ್ಕು, ಶಿಗ್ಗಾವಿಯಲ್ಲಿ ನಾಲ್ಕು ಹಾಗೂ ಹಾನಗಲ್‍ನಲ್ಲಿ 11 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರಿಹಾರ ಕೇಂದ್ರದಲ್ಲಿ ಆಶ್ರಯಪಡೆದಿರುವ ಸಂತ್ರಸ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಹೊದಿಕೆಗಳನ್ನು ನೀಡಲಾಗಿದೆ, ಅಗತ್ಯ ವೈದ್ಯೋಪಚಾರದ ವ್ಯವಸ್ಥೆ ಮಾಡಲಾಗಿದೆ. ಸಂತ್ರಸ್ಥರ ಬೇಡಿಕೆಗೆ ಅನುಸಾರ ಯಾವುದೇ ಕೊರತೆಯಾಗದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಪ್ರವಾಹದಲ್ಲಿ ಓರ್ವ ವ್ಯಕ್ತಿ ಕೊಚ್ಚಿಹೋಗಿದ್ದು ಈವರೆಗೆ ಪತ್ತೆಯಾಗಿಲ್ಲ ಹಾಗೂ ಐದು ಜನ ಗಾಯಾಳುಗಳಾಗಿದ್ದಾರೆ ಎಂದು ತಿಳಿಸಿದರು.
ಹಿರೇಕೆರೂರಿನಲ್ಲಿ ಒಂದು ಜಾನುವಾರು ಕ್ಯಾಂಪ್‍ನ್ನು ಸ್ಥಾಪಿಸಿ ಪರಿಹಾರ ಕೇಂದ್ರದಲ್ಲಿ ಇರಿಸಲಾಗಿದೆ. ಏಳು ತಾಲೂಕಿನಲ್ಲಿ ಜಾನುವಾರುಗಳಿಗಾಗಿ ಮೇವಿನ ಬ್ಯಾಂಕುಗಳನ್ನು ಸ್ಥಾಪಿಸಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ. 23 ಕುರಿಗಳು, 10 ಮೇಕೆ, ಎರಡು ಎಮ್ಮೆ, ಎರಡು ಹಸು ಸಾವನ್ನಪ್ಪಿವೆ ಎಂದು ಮಾಹಿತಿ ಲಭ್ಯವಿದೆ ಎಂದರು.
ಮನೆ ಹಾನಿ
ಜಿಲ್ಲೆಯಲ್ಲಿ 2822 ಮನೆಗಳಿಗೆ ಹಾನಿಯಾಗಿದ್ದು 271.25 ಲಕ್ಷ ರೂ. ನಷ್ಟ ಸಂಭವಿಸಿದೆ. ಈ ಪೈಕಿ 2817 ಮನೆಗಳು ಭಾಗಶಃ ಹಾಳಾಗಿವೆ. ಅಂದಾಜು 266.41 ಲಕ್ಷ ರೂ. ಹಾನಿಯಾಗಿದೆ. ಐದು ಮನೆಗಳು ಪೂರ್ಣಪ್ರಮಾಣದಲ್ಲಿ ಹಾಳಾಗಿದ್ದು, ರೂ.4.88 ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ ಎಂದು ತಿಳಿಸಿದರು.
ರಸ್ತೆಹಾನಿ
ಗುಡೂರು, ಗುಯಿಲಗುಂದಿ, ಮಣ್ಣೂರು, ಚಿಕ್ಕನೆಲ್ಲರೂ, ಹರವಿ, ಚಪ್ಪರದಿನ್ನಿ, ಅಲ್ಲಾಪುರ, ಹರನಗಿರಿ ಗ್ರಾಮಗಳ ಎಂಟು ಪಂಚಾಯತ್ ರಾಜ್ ಇಂಜನೀಯರಿಂಗ್ ವಿಭಾಗದ ರಸ್ತೆಗಳಿಗೆ ಹಾನಿಯಾಗಿದೆ. ಏಳು ರಾಜ್ಯ ಹೆದ್ದಾರಿಗಳು, 32 ಎಂ.ಡಿ.ಆರ್., ಆರು ಸಿಡಿಗಳು , ಒಂದು ಹೆಡ್‍ವಾಲ್ಸ್ ಹಾನಿಯಾಗಿದ್ದು ರೂ. 273.1 ಲಕ್ಷ ಮೌಲ್ಯದ ಲೋಕೋಪಯೋಗಿ ರಸ್ತೆ ಸೇತುವೆಗಳಿಗೆ ಹಾನಿಯಾಗಿದೆ ಎಂದು ತಿಳಿಸಿದರು.
ವಿದ್ಯುತ್ ಹಾನಿ
701 ವಿದ್ಯುತ್ ಕಂಬಗಳು ಮುಳುಗಿಹೋಗಿವೆ. 177 ಕಂಬಳಿಗೆ ಹಾನಿಯಾಗಿದೆ. 137 ಡಿಟಿಸಿ ಹಾಗೂ ಡಿಟಿಆರ್. ಮುಳುಗಿ ಹೋಗಿವೆ. ಏಳು ಡಿಟಿಸಿಗೆ ಹಾನಿಯಾಗಿವೆ ನಷ್ಟದ ಅಂದಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಬೆಳೆಹಾನಿ
ಕೃಷಿ ಜಂಟಿ ನಿರ್ದೇಶಕರ ನೇತೃತ್ವದಲ್ಲಿ ಬೆಳೆಹಾನಿ ಸಮೀಕ್ಷೆಯನ್ನು ಡ್ರೋನ್ ಕ್ಯಾಮರಾ ಬಳಸಿ ಸಮೀಕ್ಷೆ ನಡೆಸಲಾಗುತ್ತದೆ. ಪ್ರಾಥಮಿಕ ವರದಿಯಂತೆ ಐದು ಕೋಟಿ ರೂ. ಬೆಳೆನಷ್ಟ ಸಂಭವಿಸಿದೆ. 7261.95 ಹೆಕ್ಟೇರ್ ಬೆಳೆಹಾನಿಯಾಗಿದೆ. ಹಾನಗಲ್, ಹಾವೇರಿ, ಶಿಗ್ಗಾಂವ ಹಾಗೂ ಸವಣೂರ ತಾಲೂಕಿನಲ್ಲಿ ಹೆಚ್ಚಿನ ಬೆಳೆಹಾನಿ ಸಂಭವಿಸಿರುವುದಾಗಿ ತಿಳಿಸಿದರು.
ಕುಡಿಯುವ ನೀರು
ಹದಿನೈದು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಹಾಗೂ ಹತ್ತು ಜಾಕ್‍ವೆಲ್‍ಗಳು ನೀರಿನಲ್ಲಿ ಮುಳುಗಿ ಹೋಗಿವೆ. ನದಿನೀರಲಗಿ ಗ್ರಾಮಕ್ಕೆ ಬೋಟ್ ಮುಖಾಂತರ ನೀರಿನ ಕ್ಯಾನ್‍ಗಳನ್ನು ಕುಡಿಯಲು ಜನರಿಗೆ ಪೂರೈಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಾಚರಣೆ ಬೋಟ್ ವ್ಯವಸ್ಥೆ
ಬಳ್ಳಾರಿ ಹಾಗೂ ಚಿತ್ರದುರ್ಗದಿಂದ ಅಗ್ನಿಶಾಮಕ ದಳದ 30ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ನಾಲ್ಕು ಯಾಂತ್ರಿಕೃತ ಬೋಟ್‍ಗಳು ಜಿಲ್ಲೆಗೆ ಆಗಮಿಸಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಕೆ.ಲೀಲಾವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ್, ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಇದ್ದರು.
ಕೃಪೆ : ಉದಯ ಕಾಲ ನ್ಯೂಸ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ
ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ ಕಾಯಿಲೆಗಳ ಚಿಕಿತ್ಸಾ ಸೌಲಭ್ಯವನ್ನು ವಿಸ್ತರಿಸಿದೆ.
ಈ ಉಪಕ್ರಮದ ಮೂಲಕ, ಪಾಲಿಸಿದಾರರಿಗೆ ‘ಟಾಕ್ ಟು ಸ್ಟಾರ್’ ಸೇವೆ ಹಾಗೂ ಮನೆ ಬಾಗಿಲಿನ ಆರೋಗ್ಯ ಸೇವೆ ಕಲ್ಪಿಸಿಕೊಡಲಾಗುತ್ತಿದೆ. ಇದರ ನೆರವಿನಿಂದ ಆರಂಭಿಕ ಹಂತದಲ್ಲೇ ಅಗತ್ಯ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆಗಳ ನೆರವು ಒದಗಿಸಲಾಗುತ್ತಿದೆ. ಜೊತೆಗೆ, ಸಾರ್ವಜನಿಕರು ಸ್ಟಾರ್ ಹೆಲ್ತ್ ಕಸ್ಟಮರ್ ಆ್ಯಪ್ ಮೂಲಕ 24*7 ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಸ್ಟಾರ್ ಹೆಲ್ತ್ ಇನ್ಶುರನ್ಸ್ ಕರ್ನಾಟಕ ವಹಿವಾಟು ವಿಭಾಗದ ಮುಖ್ಯಸ್ಥ ಆದಿತ್ಯ ಓಂಪ್ರಕಾಶ್ ಬಿಯಾನಿ ಹೇಳಿದ್ದಾರೆ.
ಪಾಲಿಸಿದಾರರಿಗೆ ಅನಿಯಮಿತ ಟೆಲಿ ಸಮಾಲೋಚನೆಯಡಿ ಪಾಲಿಸಿ ಅವಧಿಯಲ್ಲಿ ಎಷ್ಟೇ ಬಾರಿ ಬೇಕಾದರೂ ದೂರವಾಣಿ ಅಥವಾ ಆನ್‍ಲೈನ್ ಮೂಲಕ ವೈದ್ಯರ ಸಲಹೆ ಪಡೆಯಬಹುದು. ಜ್ವರ ಅಥವಾ ಸೋಂಕಿನ ಆರಂಭಿಕ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಸಲಹೆ ಪಡೆಯಲು ಇದು ನೆರವಾಗುತ್ತದೆ. ಸಾರ್ವಜನಿಕರಿಗೆ ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆಯೂ ಇರುತ್ತದೆ.
ಅಂತೆಯೇ ಪಾಲಿಸಿದಾರರು ‘ಟಾಕ್ ಟು ಸ್ಟಾರ್’ ಸೇವೆಯಡಿ 7200 222 333 ಸಂಖ್ಯೆಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದು. ನಗದುರಹಿತ ಮನೆ ಬಾಗಿಲಿನ ಆರೋಗ್ಯ ಸೇವೆಯಡಿ ಅರ್ಹ ಪಾಲಿಸಿದಾರರಿಗೆ ಸ್ಟಾರ್ ಹೆಲ್ತ್ ಕ್ಯಾಷ್‍ಲೆಸ್- ಸೌಲಭ್ಯದ ಮೂಲಕ ಮನೆ ಬಾಗಿಲಿಗೇ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ವೈದ್ಯರ ಸಲಹೆಯಂತೆ ನಸಿರ್ಂಗ್ ಸೇವೆ, ರಕ್ತ ಪರೀಕ್ಷೆ, ಆರೋಗ್ಯ ಮೇಲ್ವಿಚಾರಣೆ, ಐವಿ ಫ್ಲೂಯಿಡ್ಸ್ ಹಾಗೂ ಚುಚ್ಚುಮದ್ದು ಸೇರಿದಂತೆ ಅಗತ್ಯ ಚಿಕಿತ್ಸೆಗಳನ್ನು ಮನೆಯಲ್ಲೇ ನೀಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್‌ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್‌ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್‌ಒಗಳನ್ನು ಅಥವಾ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್‌ವೈಸರ್‌ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್‌ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ5 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ4 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ2 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ2 hours agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

