ದಿನದ ಸುದ್ದಿ
ಕೊಡಗಿನಲ್ಲಿ ವರುಣನ ಅರ್ಭಟ ಕ್ಕೆ ಜಲಾವೃತಗೊಂಡ ಭಾಗಮಂಡಲ..!
ಸುದ್ದಿದಿನ ಡೆಸ್ಕ್ : ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ ಜನ ತತ್ತರಿಸಿದ್ದಾರೆ. ಎಡೆಬಿಡದೆ ಮಳೆ ಸುರಿಯುತ್ತಿರೋದ್ರಿಂದ ನದಿ ತೊರೆಗಳು ಉಕ್ಕಿ ಹರಿಯುತ್ತಿದ್ದು, ಹಲವು ಗ್ರಾಮಗಳ ಸೇತುವೆ, ರಸ್ತೆಗಳು ಸೇರಿದಂತೆ ದಕ್ಷಿಣ ಕಾಶಿ ಖ್ಯಾತಿಯ ತಲಕಾವೇರಿ ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣವಾಗಿ ಜಲಾವೃತವಾಗಿದೆ. ಭಾಗಮಂಡಲದ ಭಗಂಡೇಶ್ವರ ದೇವಾಲಯದ ಮೆಟ್ಟಿಲಿನವರೆಗೂ ನೀರು ಬಂದಿದ್ದು, ಮಡಿಕೇರಿ-ಭಾಗಮಂಡಲ-ತಲಕಾವೇರಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸ್ಥಳೀಯರು ಹಾಗೂ ಯಾತ್ರಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ.
ಹನಿ ತುಂಡಾಗದಂತೆ ಎಡೆಬಿಡದೆ ಧೋ ಎಂದು ಸುರಿಯುತ್ತಿರೋ ಮಳೆ. ಉಕ್ಕಿ ಹರಿಯುತ್ತಿರುವ ಜಲಧಾರೆಗಳು. ನೀರಿನಿಂದ ಆವೃತವಾಗಿರುವ ರಸ್ತೆ-ಸೇತುವೆಗಳು. ಜಲಾವೃತಗೊಂಡು ದ್ವೀಪದಂತಾಗಿರುವ ಗ್ರಾಮಗಳು. ಮುಳುಗಡೆಯಾಗಿರುವ ರಸ್ತೆಯಲ್ಲಿ ಸಾಗಲು ಜನರ ಪರದಾಟ. ಅಲ್ಲಲ್ಲಿ ಧರೆಗುರುಳಿರೋ ಬೃಹದಾಕಾರದ ಮರಗಳು.ಕುಸಿದಿರುವ ರಸ್ತೆಗಳು. ತೀರ್ಥ ಕ್ಷೇತ್ರದ ಭೇಟಿ ಬಂದು ಸಂಕಷ್ಟದಲ್ಲಿ ಸಿಲುಕಿರೋ ಯಾತ್ರಾರ್ಥಿಗಳು.ಭರದಿಂದ ನಡೆಯುತ್ತಿರೋ ರಕ್ಷಣಾ ಕಾರ್ಯಾಚರಣೆ. ಕಣ್ಣೆತ್ತಿ ನೋಡಿದಷ್ಟೂ ದೂರ ನೀರೋ ನೀರು. ಇಂತಹ ದೃಷ್ಯಕ್ಕೆ ಸಾಕ್ಷಿಯಾಗ್ತಿರೋದು ಕೊಡಗು ಜಿಲ್ಲೆ. ಕೊಡಗಿನಲ್ಲಿ ಕಳೆದ 1 ವಾರದಿಂದ ಎಡೆಬಿಡದೆ ಸುರಿಯುತ್ತಿರೋ ಮಳೆಯಿಂದ ಇಡೀ ಜಿಲ್ಲೆ ತತ್ತರಿಸಿದೆ. ಮುಂಗಾರಿನ ಅಬ್ಬರ ಹಲವು ಅನಾಹುತಗಳನ್ನೇ ಸೃಷ್ಟಿಸಿದೆ. ರಸ್ತೆಗಳು ಬಂದ್ ಆಗಿವೆ. ಹಲವು ಗ್ರಾಮಗಳು ಜಲಾವೃತಗೊಂಡು, ಕರೆಂಟ್ ಇಲ್ಲದೆ ಕತ್ತಲಲ್ಲಿ ಮುಳುಗಿವೆ. ಅದ್ರಲ್ಲೂ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಕಾವೇರಿ, ಕನ್ನಿಕೆ, ಸುಜೋತಿ ನಡಿಗಳು ಉಕ್ಕಿ ಹರಿಯುತ್ತಿದ್ದು, ಭಾಗಮಂಡಲ ಭಗಂಡೇಶ್ವರ ದೇವಾಲಯದ ಪ್ರದೇಶ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಮಡಿಕೇರಿ-ಭಾಗಮಂಡಲ-ತಲಕಾವೇರಿ ಹಾಗೂ ಭಾಗಮಂಡಲ ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ.
ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆಯಾದ ಪರಿಣಾಮ ಕಾವೇರಿ , ಕನ್ನಿಕೆ ಹಾಗೂ ಸುಜೋತಿ ನದಿಗಳು ಉಕ್ಕಿ ಹರಿಯುತ್ತಿವೆ. 3 ನದಿಗಳು ಸಂಗಮವಾಗುವ ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಪುರಾಣ ಪ್ರಸಿದ್ಧ ಭಾಗಮಂಡಲ ಭಗಂಡೇಶ್ವರ ದೇವಾಲಯದ ಮೆಟ್ಟಿಲಿನವರೆಗೂ ನೀರು ನುಗ್ಗಿದೆ. ರಸ್ತೆಯ ಮೇಲೆ ನಾಲ್ಕೈದು ಅಡಿ ಎತ್ತರದಲ್ಲಿ ನೀರು ಹರಿಯುತ್ತಿರೋದ್ರಿಂದ ತಲಕಾವೇರಿ ಭಾಗದ ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ಇನ್ನು ಭಾಗಮಂಡಲ-ತಲಕಾವೇರಿ ಕ್ಷೇತ್ರಕ್ಕೆ ಆಗಮಿಸುತ್ತಿರುವ ಯಾತ್ರಾರ್ಥಿಗಳು ಸೇರಿದಂತೆ ಈ ಭಾಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲಾಡಳಿತ ಮೋಟಾರ್ ಬೋಟ್ ಹಾಗೂ ರ‍್ಯಾಫ್ಟಿಂಗ್ ಬೋಟ್ ಗಳ ಮೂಲಕ ಯಾತ್ರಾರ್ಥಿಗಳು ಹಾಗೂ ಸ್ಥಳೀಯರನ್ನು ಒಂದು ಬದಿಯಿಂದ ಮತ್ತೊಂದು ಬದಿಗೆ ಕರೆದೊಯ್ದು ಕರೆತರುವ ಕಾರ್ಯದಲ್ಲಿ ನಿರತವಾಗಿದೆ. ಸ್ಥಳದಲ್ಲಿ ಹಿರಿಯ ಅಧಿಕಾರಿಗಳು ಬೀಡು ಬಿಟ್ಟು ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದಾರೆ. ಭಾಗಮಂಡಲದಲ್ಲಿ ಪ್ರವಾಹ ಪರಿಸ್ಥಿತಿ ಎದುರಾದ ಪರಿಣಾಮ ಇಲ್ಲಿಗೆ ಭೇಟಿ ನೀಡೋ ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರ ಸಂಖ್ಯೆಯೂ ಇಳಿಮುಖವಾಗಿದೆ. ಪ್ರತೀ ವರ್ಷ ಮಳೆಗಾಲದಲ್ಲಿ ಜಲಾವೃತವಾಗುವ ತ್ರಿವೇಣಿ ಸಂಗಮದ ಬಳಿ ಬಹುಕೋಟಿಯ ಮೇಲ್ಸೇತುವೆ ಯೋಜನೆ ಇನ್ನೂ ಕಾರ್ಯರೂಪಕ್ಕೆ ಬರದಿರೋದು ಸ್ಥಳೀಯರ ಅಸಮಧಾನಕ್ಕೆ ಕಾರಣವಾಗಿದೆ.
ಕೇವಲ ಭಾಗಮಂಡಲ ಮಾತ್ರವಲ್ಲದೆ ಜಿಲ್ಲೆಯ ಇತರೆಡೆಯ ತಗ್ಗು ಪ್ರದೇಶ ಹಾಗೂ ನದಿ ತಟದಲ್ಲಿರೋ ಗ್ರಾಮಗಳೂ ನೀರಿನಿಂದ ಮುಳುಗುತ್ತಿವೆ. ಕಳೆದ ರಾತ್ರಿ ಮಡಿಕೇರಿಯಲ್ಲಿ ಸುರಿದ ಭಾರೀ ಮಳೆಗೆ ಕಾರಿನ ಮೇಲೆ ಮಣ್ಣು ಕುಸಿದು, ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಇನ್ನೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಮಾಕುಟ್ಟ ರಸ್ತೆಯ ಮೇಲೆ ನೆನ್ನೆ ಮರ ಸಹಿತ ಗುಡ್ಡಗಳು ಕುಸಿದ ಪರಿಣಾಮ ಓರ್ವನ ಬಲಿಯಾಗಿದ್ದು, ಈ ಮಾರ್ಗದಲ್ಲಿ ರಸ್ತೆ ಸಂಚಾರವನ್ನು ನಿಷೇಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅಷ್ಟೇ ಅಲ್ದೆ ವಿರಾಜಪೇಟೆ-ಹುಣಸೂರು-ಮೈಸೂರು ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ವಿರಾಜಪೇಟೆ ತಾಲೂಕಿನ ತಿತಿಮತಿ ಎಂಬಲ್ಲಿ ಸೇತುವೆ ಕುಸಿತು ರಸ್ತೆ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಒಟ್ನಲ್ಲಿ ಮುಂಗಾರಿನ ಅಬ್ಬರ ಕೊಡಗಿನಲ್ಲಿ ಹಲವು ಅನಾಹುತಗಳನ್ನು ಸೃಷ್ಠಿಸೋ ಮೂಲಕ ಜಿಲ್ಲೆಯ ಜನತೆಯನ್ನು ಹೈರಾಣಾಗಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’
ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ . ಸಿ. ಹೆಚ್ ಅವರು ಉದ್ಘಾಟಿಸಿದರು.
ಸನಾವುಲ್ಲಾ ನವಿಲೇಹಾಳು ಅವರು ಉಪನ್ಯಾಸ ಮಾಡಿ ಹೊಸ ತಲೆಮಾರಿನವರು ಸಮಾಜಿಕ ಜಾಲತಾಣಗಳಲ್ಲಿ ಗೇಮ್ , ರೀಲ್ಸ್ ಇತರೆ ವಿಷಯಗಳಲ್ಲಿ ಮುಳುಗಿ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ಕಟ್ಟಿಕೊಳ್ಳಬೇಕು. ತ್ಯಾಗ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆಕೊಟ್ಟರು.
ಉಪಸ್ಥಿತರಿದ್ದ ಕಾಲೇಜಿನ ಕುಲಸಚಿವರಾದ ಶ್ರೀ ಜಗದೀಶ್ ಹೆಚ್ ಅವರು ಮಾತನಾಡಿ ವಿದ್ಯಾರ್ಥಿಗಳು ತಮಗೆ ಎದುರಾಗುವ ಸಮಸ್ಯೆಗಳನ್ನು ಮೆಟ್ಟಿನಿಂತು ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರು. ಸಿಸಿಟೆಕ್ ಮ್ಯಾನೇಜರ್ ಆದ ಶ್ರೀ ಶಿವಕುಮಾರ ಸ್ವಾಮಿ ಎಸ್.ಹೆಚ್. ಸಂಯೋಜಕರಾದ ಶ್ರೀ ಮತಿ ಆಸೀಯಾ ಬಾನು ಬಿ. ಪ್ರಾಸ್ಥಾವಿಕವಾಗಿ ಮಾತನಾಡಿದರು ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಬೃಂದ ಕಾರ್ಯಕ್ರಮ ನಿರೂಪಿಸಿದರು,
ವೈಷ್ಣವಿ, ಲಾವಣ್ಯ, ಭಾವನ ಪ್ರಾರ್ಥಿಸಿದರು, ಉಪನ್ಯಾಸಕಿ ಪ್ರಿಯಾಂಕ ಟಿ ಎಸ್ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ2 days agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ3 days agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ3 days agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ17 hours agoಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

