ದಿನದ ಸುದ್ದಿ
ಮುಂದಿನ 10 ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆ
ಸುದ್ದಿದಿನ ಡೆಸ್ಕ್ : ದೇಶದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕೇರಳ, ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಹಾಗೂ ಮತ್ತಿತರ ಕೇಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ.
ಕೇರಳದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಭಾರತೀಯ ಹವಾಮಾನ ಇಲಾಖೆ 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮುನ್ನೆಚ್ಚರಿಕೆ ನೀಡಲಾಗಿದೆ. ಇಂದು ಮತ್ತು ನಾಳೆ ಹಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ರಕ್ಷಣಾ ಪಡೆಗಳು ಸನ್ನದ್ಧವಾಗಿದ್ದು, ಇತರೆ ಪರಿಹಾರೋಪಾಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ, ಕರಾವಳಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ಧಾರವಾಡ, ಚಿತ್ರದುರ್ಗಗಳಲ್ಲಿ ಆರೆಂಜ್ ಅಲರ್ಟ್, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕ ಹವಾಮಾನ ಇಲಾಖೆ ನಿರ್ದೇಶಕರಾದ ಗೀತಾ ಅಗ್ನಿಹೋತ್ರಿ ಆಕಾಶವಾಣಿಯೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಪ್ರಾಂತ್ಯದಲ್ಲಿ ನೈಋತ್ಯ ಮುಂಗಾರು ಹೆಚ್ಚಾಗಿದೆ. ಮುಂದಿನ 10 ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ಕಾರವಾರ ಕರಾವಳಿ ಪ್ರಾಂತ್ಯದಲ್ಲಿ ನಿನ್ನೆ 18 ಸೆಂಟಿಮೀಟರ್ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲಾಡಳಿತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲಾ-ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಿಸಲಾಗಿದೆ.
ಮಳೆಯಿಂದಾಗಿ ಸಂಭವಿಸಬಹುದಾದ ವಿಪತ್ತುಗಳನ್ನು ತಡೆಗಟ್ಟಲು ವಿಪತ್ತು ನಿರ್ವಹಣಾ ಪ್ರಾಧಿಕಾರ ತಂಡವನ್ನು ರಚಿಸಿದೆ. ಅಗತ್ಯವಿದ್ದಲ್ಲಿ 1022ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದೆಂದು ಸೂಚಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243