ದಿನದ ಸುದ್ದಿ
ಇಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ
ಸುದ್ದಿದಿನ ಡೆಸ್ಕ್ : ಹಿಮಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ನೇಮಕಗೊಂಡಿದ್ದಾರೆ.
ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿದ್ದ ಸುಖ್ವಿಂದರ್ ಸಿಂಗ್ ಸುಖು ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅನುಮೋದಿಸಿತ್ತು. ವಿಧಾನಸಭೆ ಸಂಕೀರ್ಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸುಖ್ವಿಂದರ್ ಸಿಂಗ್ ಸುಖು ಅವರನ್ನು ಆಯ್ಕೆ ಮಾಡಲಾಯಿತು.
ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಪಕ್ಷದ ಅಧ್ಯಕ್ಷರಿಗೆ ಅಧಿಕಾರ ನೀಡುವ ನಿರ್ಣಯವನ್ನು ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ಸರ್ವಾನುಮತದಿಂದ ಅಂಗೀಕರಿಸಿದ ನಂತರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯನ್ನು ಹೈಕಮಾಂಡ್ ಆಯ್ಕೆ ಮಾಡಲಾಗಿದೆ.
ಸಭೆಯ ನಂತರ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಭಗೇಲ್ ಅವರು ಈ ವಿಷಯವನ್ನು ಪ್ರಕಟಿಸಿದರು.
ಮುಕೇಶ್ ಅಗ್ನಿಹೋತ್ರಿ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಇಂದು ಮಧ್ಯಾಹ್ನ 12 ಗಂಟೆಗೆ ಶಿಮ್ಲಾದ ಐತಿಹಾಸಿಕ ರಿಡ್ಜ್ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರ ಸಮಾರಂಭ ನಡೆಯಲಿದೆ.
ನಾದೌನ್ ವಿಧಾನಸಭಾ ಕ್ಷೇತ್ರದಿಂದ ಜಯಗಳಿಸಿರುವ, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸುಖ್ವಿಂದರ್ ಸಿಂಗ್ ಸುಖು ಅವರು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಆರ್ಲೆಕರ್ ಅವರನ್ನು ಭೇಟಿ ಮಾಡಿ ಸರಕಾರ ರಚನೆ ಮಾಡುವ ಮಾತುಕತೆ ನಡೆಸಿದರು.
ರಾಜ್ಯ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ಸಿಂಗ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಸೇರಿದಂತೆ ಹಲವು ನಾಯಕರು ಮುಖ್ಯಮಂತ್ರಿ ರೇಸ್‌ನಲ್ಲಿದ್ದರು. ಅಂತಿಮವಾಗಿ ಸುಖ್ವಿಂದರ್ ಸಿಂಗ್ ಸುಖು ಅವರನ್ನು ಹೈಕಮಾಂಡ್ ಆಯ್ಕೆ ಮಾಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243