ದಿನದ ಸುದ್ದಿ
ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ ಇಲ್ಲ, ಕೇರ್ ಸೆಂಟರ್ ದಾಖಲು ಕಡ್ಡಾಯ : ಸಚಿವ ಡಾ. ಕೆ. ಸುಧಾಕರ್
ಸುದ್ದಿದಿನ,ದಾವಣಗೆರೆ : ಹೋಂ ಐಸೋಲೇಷನ್‍ಗೆ ಒಳಗಾಗುವ ಕೋವಿಡ್ ಸೋಂಕಿತರಿಂದಲೇ ಇತರರಿಗೆ ಸೋಂಕು ಹೆಚ್ಚು ಹರಡುತ್ತಿರುವುದು ಕಂಡುಬಂದಿದ್ದು, ಹೀಗಾಗಿ ಇನ್ನು ಮುಂದೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್‍ಗೆ ಅವಕಾಶ ನೀಡದೆ, ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‍ನಲ್ಲಿಯೇ ದಾಖಲು ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿ ಕುರಿತಂತೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸದ್ಯ 4789 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಇದರಲ್ಲಿ 3259 ಜನ ಹೋಂ ಐಸೋಲೇಷನ್‍ನಲ್ಲಿದ್ದಾರೆ, ಉಳಿದಂತೆ 1530 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾವಣಗೆರೆ ತಾಲ್ಲೂಕು ಒಂದರಲ್ಲಿಯೇ 1986 ಜನ ಹೋಂ ಐಸೋಲೇಷನ್‍ನಲ್ಲಿ ಇದ್ದಾರೆ. ಸೂಕ್ತ ಸೌಲಭ್ಯಗಳಿಲ್ಲದೇ ಹೋಂ ಐಸೋಲೇಷನ್‍ನಲ್ಲಿ ಇರುವವರಿಂದ, ಹಾಗೂ ಮಾರ್ಗಸೂಚಿ ಪಾಲನೆ ಮಾಡದಿರುವ ಕಾರಣಗಳಿಂದ, ಕುಟುಂಬ ಸದಸ್ಯರಿಗೆ ಹಾಗೂ ಇತರರಿಗೆ ಸೋಂಕು ಹರಡುತ್ತಿರುವುದು ಕಂಡುಬಂದಿದೆ.
ಜಿಲ್ಲೆಯಲ್ಲಿ ಒಟ್ಟು 12 ಕೋವಿಡ್ ಕೇರ್ ಸೆಂಟರ್‍ಗಳು (ಸಿಸಿಸಿ) ಕಾರ್ಯನಿರ್ವಹಿಸುತ್ತಿದ್ದು, 760 ಜನ ಸದ್ಯ ಸಿಸಿಸಿ ನಲ್ಲಿ ಇದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಸಾವು ಹಾಗೂ ಸೋಂಕಿನ ಪ್ರಮಾಣ ಕಡಿಮೆಯಾಗಬೇಕು, ಜಿಲ್ಲೆಯಲ್ಲಿ ಉತ್ತಮ ಸೌಲಭ್ಯಗಳಿರುವ ವಸತಿ ನಿಲಯಗಳು, ಸರ್ಕಾರಿ ಹಾಗೂ ಖಾಸಗಿ ಸಮುದಾಯ ಭವನಗಳನ್ನು ಗುರುತಿಸಿ, ಕೋವಿಡ್ ಕೇರ್ ಸೆಂಟರ್‍ಗಳನ್ನಾಗಿ ಪರಿವರ್ತಿಸಬೇಕು.
ಸೋಂಕಿತರು ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್‍ನಲ್ಲಿ ಇರುವುದು ಬೇಡ. ಕಡ್ಡಾಯವಾಗಿ ಅವರನ್ನು ಸಿಸಿಸಿ ನಲ್ಲಿಯೇ ದಾಖಲಿಸಬೇಕು. ದಾಖಲಿಸಿದ 5 ಗಂಟೆಯ ಒಳಗಾಗಿ ಅವರಿಗೆ ನಿಗದಿತ ಎಲ್ಲ ಔಷಧಿ, ಸಾಮಗ್ರಿಗಳುಳ್ಳ ಮೆಡಿಕಲ್ ಕಿಟ್ ಕೊಡಬೇಕು, ಅಲ್ಲದೆ ಅವರಿಗೆ ವೈದ್ಯರಿಂದ ಚಿಕಿತ್ಸೆ ಪ್ರಾರಂಭವಾಗಬೇಕು. ಸಿಸಿಸಿ ಗಳಲ್ಲಿ ಉತ್ತಮ ರೀತಿಯಲ್ಲಿ ವಸತಿ, ಊಟೋಪಹಾರ ಗುಣಮಟ್ಟದ್ದಾಗಿರಬೇಕು.
ಇದನ್ನೂ ಓದಿ | ಸೋಂಕು ದೃಢಪಟ್ಟ 5 ತಾಸಿನೊಳಗಾಗಿ ಕೋವಿಡ್ ಕಿಟ್ ಒದಗಿಸಿ : ಸಚಿವ ಡಾ.ಕೆ.ಸುಧಾಕರ್
ಉತ್ತಮ ಪೌಷ್ಠಿಕ ಆಹಾರ ನೀಡಲು ಈಗಾಗಲೆ ಆದೇಶಿಸಲಾಗಿದೆ ಎಂದು ಸಚಿವರು ಹೇಳಿದರು. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‍ನಲ್ಲಿ ದಾಖಲಿಸುವ ದಿಸೆಯಲ್ಲಿ ಸ್ಥಳೀಯ ಟಾಸ್ಕ್ ಫೋರ್ಸ್ ಸಮಿತಿ ಜಿಲ್ಲೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಸ್ಥಳೀಯ ಮಟ್ಟದ ಸಮಿತಿಯ ನಿರ್ಲಕ್ಷ್ಯ ಕಾರಣ ಗ್ರಾಮಗಳಲ್ಲಿ ಸೋಂಕು ಹೆಚ್ಚು ಹರಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಿಗದಿತ ಬೆಡ್‍ಗಳನ್ನು ಕೊಡಲೇಬೇಕು
ರಾಜ್ಯದಲ್ಲಿ ಸದ್ಯ ಕೋವಿಡ್ ತುರ್ತು ಸ್ಥಿತಿ ಇದೆ. ಎಲ್ಲ ಖಾಸಗಿ ಮೆಡಿಕಲ್ ಕಾಲೇಜುಗಳು ಶೇ. 75 ಹಾಗೂ ಖಾಸಗಿ ಆಸ್ಪತ್ರೆಗಳು ಶೇ. 50 ರಷ್ಟು ಬೆಡ್‍ಗಳನ್ನು ಸರ್ಕಾರಿ ಆಸ್ಪತ್ರೆಯಿಂದ ಶಿಫಾರಸು ಮಾಡಲಾದ ರೋಗಿಗಳಿಗಾಗಿ ಒದಗಿಸಲೇಬೇಕು. ಇದರಲ್ಲಿ ಯಾವುದೇ ರಿಯಾಯಿತಿ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಜನರ ಪ್ರಾಣ ರಕ್ಷಿಸುವುದು ನನ್ನ ಕರ್ತವ್ಯ.
ಆದರೆ ದಾವಣಗೆರೆಯಲ್ಲಿ 850 ಬೆಡ್ ಸಾಮಥ್ರ್ಯ ಹೊಂದಿರುವ ಎಸ್‍ಎಸ್ ಮೆಡಿಕಲ್ ಕಾಲೇಜಿನಲ್ಲಿ ಕೇವಲ 54 ಹಾಗೂ 850 ಬೆಡ್ ಸಾಮಥ್ರ್ಯದ ಬಾಪೂಜಿ ಜೆಜೆಎಂಸಿ ಕಾಲೇಜಿನಲ್ಲಿ ಕೇವಲ 37 ಬೆಡ್‍ಗಳನ್ನು ಮಾತ್ರ ನೀಡಿದ್ದು, ಸರ್ಕಾರದ ಸೂಚನೆ ಪಾಲಿಸುತ್ತಿಲ್ಲ ಹಾಗೂ ಜಿಲ್ಲಾಡಳಿತದೊಂದಿಗೆ ಸಹಕರಿಸುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ್ ಅವರು ಆರೋಗ್ಯ ಸಚಿವರ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ರಾಜ್ಯ ಮಟ್ಟದಲ್ಲಿ ಸರ್ಕಾರ ಕೈಗೊಂಡ ನಿರ್ಧಾರವನ್ನು ಇಲ್ಲಿನ ಖಾಸಗಿ ಮೆಡಿಕಲ್ ಕಾಲೇಜುಗಳು ಪಾಲಿಸದಿರುವುದು ನಿಜಕ್ಕೂ ಅಚ್ಚರಿ ಹಾಗೂ ನೋವು ತಂದಿದೆ. ಸರ್ಕಾರ ಖಾಸಗಿ ಆಡಳಿತ ಮಂಡಳಿಯೊಂದಿಗೆ ಘರ್ಷಣೆಯನ್ನು ಬಯಸುವುದಿಲ್ಲ. ರಾಜ್ಯದಲ್ಲಿ ಎಲ್ಲ ಖಾಸಗಿ ಮೆಡಿಕಲ್ ಕಾಲೇಜಗಳೂ ಕೂಡ ನಿಗದಿತ ಪ್ರಮಾಣದಲ್ಲಿ ಬೆಡ್ ನೀಡುವ ಮೂಲಕ ಸ್ಪಂದಿಸಿದ್ದಾರೆ. ಎಲ್ಲಿಯೂ ಕೂಡ ಈ ರೀತಿಯ ಅಸಹಾಕಾರ ಕಂಡುಬಂದಿಲ್ಲ.
ರಾಜ್ಯದ ಜನರ ಆರೋಗ್ಯ ಹಾಗೂ ಪ್ರಾಣ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಸರ್ಕಾರಿ ಆಸ್ಪತ್ರೆಗಳಿಂದ ಶಿಫಾರಸ್ಸು ಮಾಡುವ ರೋಗಿಗಳಿಗೆ ನಿಗದಿತ ಸಂಖ್ಯೆಯಷ್ಟು ಬೆಡ್ ನೀಡಲೇಬೇಕು. ನಾವೇನು ಉಚಿತವಾಗಿ ಚಿಕಿತ್ಸೆ ನೀಡಿ ಎಂದು ಹೇಳುತ್ತಿಲ್ಲ. ಪ್ರತಿ ರೋಗಿಗೂ ಸರ್ಕಾರದಿಂದ ಹಣ ಪಾವತಿಸುತ್ತೇವೆ. ಇದು ಹೆಲ್ತ್ ಎಮರ್ಜೆನ್ಸಿ ಕಾಲವಾಗಿದ್ದು ಅತ್ಯಂತ ತುರ್ತು ನಾನ್ ಕೋವಿಡ್ ರೋಗಿಗಳಿಗೆ ಮಾತ್ರ ಖಾಸಗಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳು ಚಿಕಿತ್ಸೆ ನೀಡಬೇಕು.
ಇತರೆ ಚಿಕಿತ್ಸೆಗಳನ್ನು 2-3 ತಿಂಗಳು ಮುಂದೂಡಬೇಕು. ಕೋವಿಡ್ ರೋಗಿಗಳಿಗೇ ಬೆಡ್‍ಗಳನ್ನು ಒದಗಿಸಬೇಕು. ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳು ನಿಗದಿಯಂತೆ ಕ್ರಮವಾಗಿ ಶೇ. 75 ಹಾಗೂ ಶೇ. 50 ರಷ್ಟು ಬೆಡ್‍ಗಳನ್ನು ನೀಡಲೇಬೇಕು ಹಾಗೂ ಬೆಡ್ ಲಭ್ಯತೆಯ ಸ್ಥಿತಿಗತಿಯ ಬೋರ್ಡ್ ಪ್ರದರ್ಶಿಸುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ ಕಾನೂನು ಪ್ರಕಾರ ನಾವು ತೆಗೆದುಕೊಳ್ಳಬೇಕಾಗುತ್ತದೆ.
ನಿಗದಿಯಂತೆ ಬೆಡ್‍ಗಳನ್ನು ಪಡೆಯದಿದ್ದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಸಹಕಾರ ನೀಡದವರ ವಿರುದ್ಧ ಜಿಲ್ಲಾಧಿಕಾರಿ ಹಾಗೂ ಡಿಹೆಚ್‍ಒ ಅವರು ಸಾಂಕ್ರಾಮಿಕ ರೋಗ ನಿರ್ವಹಣೆ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಸಚಿವರು ಸೂಚನೆ ನೀಡಿದರು.
2150 ವೈದ್ಯರ ನೇಮಕ
ಜಿಲ್ಲೆಯಲ್ಲಿನ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್, ವೆಂಟಿಲೇಟರ್‍ಗಳನ್ನು ಒದಗಿಸಲಾಗಿದ್ದು, ಕೆಲವೆಡೆ ತಜ್ಞ ವೈದ್ಯರು ಹಾಗೂ ನುರಿತ ಸಿಬ್ಬಂದಿ ಕೊರತೆ ಕಾರಣ ಬಳಕೆಗೆ ತೊಂದರೆಯಾಗಿದೆ ಎಂಬುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ರಾಜ್ಯದಲ್ಲಿ 2150 ವೈದ್ಯರು, 780 ತಜ್ಞ ವೈದ್ಯರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೆರಡು ದಿನಗಳಲ್ಲಿ ಅವರಿಗೆ ಸ್ಥಳ ನಿಯುಕ್ತಿ ಆದೇಶ ಆಗಲಿದೆ.
ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ ನೀಗಲಿದೆ. ಆಕ್ಸಿಜನ್ ಬೆಡ್, ವೆಂಟಿಲೇಟರ್ ಬಳಕೆಗೆ ಸಂಬಂಧಿಸಿದಂತೆ ಲಭ್ಯವಿರುವ ಸಿಬ್ಬಂದಿಗಳಿಗೆ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಸೂಕ್ತ ತರಬೇತಿಯನ್ನು ಕೊಡಿಸಬೇಕು, ಜಿಲ್ಲೆಯಲ್ಲಿ ಕೂಡಲೆ ಈ ಕಾರ್ಯ ಆಗಬೇಕು ಎಂದು ಸಚಿವರು ತಾಕೀತು ಮಾಡಿದರು.
ಆಂಬುಲೆನ್ಸ್‍ಗೆ ದರ ನಿಗದಿ
ರಾಜ್ಯದಲ್ಲಿ ಕೋವಿಡ್ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡುತ್ತಿರುವ ಸಂದರ್ಭದ ಪರಿಸ್ಥಿತಿಯ ದುರ್ಲಾಭ ಪಡೆದು, ಖಾಸಗಿ ಆಂಬುಲೆನ್ಸ್‍ಗಳು ರೋಗಿಗಳಿಂದ ಹೆಚ್ಚಿನ ದರ ವಸೂಲಿ ಮಾಡುವ ಮೂಲಕ, ಮೊದಲೇ ನೊಂದಿರುವವರಿಗೆ ಇನ್ನಷ್ಟು ಹಿಂಸೆ ನೀಡುವಂತಹ ಅಮಾನವೀಯ ವರ್ತನೆ ತೋರುವುದು ಸಮಂಜಸವಲ್ಲ.
ಈ ಕುರಿತು ಬಹಳಷ್ಟು ದೂರುಗಳು ಕೇಳಿಬಂದಿದ್ದು, ಈಗಾಗಲೆ ಈ ದಿಸೆಯಲ್ಲಿ ಸಾರಿಗೆ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಖಾಸಗಿ ಆಂಬುಲೆನ್ಸ್‍ಗಳಿಗೆ ದರವನ್ನು ನಿಗದಿಪಡಿಸಲಾಗುವುದು. ನಿಗದಿಗಿಂತ ಹೆಚ್ಚಿನ ದರ ಪಡೆಯುವವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಎಲ್ಲ ತಾಲ್ಲೂಕುಗಳಿಗೆ ಆಕ್ಸಿಜನ್ ಘಟಕ : ಕೋವಿಡ್ ರೋಗಿಗಳಿಗಾಗಿ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ನೀಗಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ತಾಲ್ಲೂಕುಗಳಲ್ಲಿಯೂ ಆಕ್ಸಿಜನ್ ಘಟಕವನ್ನು ಸ್ಥಾಪಿಸುವ ಆಲೋಚನೆ ಇದೆ. ದಾವಣಗೆರೆ ಜಿಲ್ಲೆಯಲ್ಲಿ ಸಂಸದರಾದ ಜಿ.ಎಂ. ಸಿದ್ದೇಶ್ವರ್ ಅವರು ತಮ್ಮ ಟ್ರಸ್ಟ್ ವತಿಯಿಂದ 1.5 ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಘಟಕ ನೀಡಲು ಕ್ರಮ ವಹಿಸಿದ್ದಕ್ಕಾಗಿ ಹಾಗೂ ಚನ್ನಗಿರಿ ಶಾಸಕರು ಹಾಗೂ ಕೆಸ್‍ಎಸ್‍ಡಿಎಲ್ ಅಧ್ಯಕ್ಷರಾದ ಮಾಡಾಳ್ ವಿರುಪಾಕ್ಷಪ್ಪ ಅವರು ಕೂಡ ಚನ್ನಗಿರಿಯಲ್ಲಿ ನಿಗಮದ ವತಿಯಿಂದ ಆಕ್ಸಿಜನ್ ಘಟಕ ಸ್ಥಾಪಿಸಲು ಮುಂದಾಗಿದ್ದಕ್ಕಾಗಿ ಸರ್ಕಾರದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ.
ದಾವಣಗೆರೆ ಜಿಲ್ಲೆಗೆ ಒಟ್ಟು 115 ಆಕ್ಸಿಜನ್ ಕಾನ್ಸನ್‍ಟ್ರೇಟರ್‍ಗಳನ್ನು ವಿವಿಧ ಮೂಲಗಳಿಂದ ಒದಗಿಸಲಾಗಿದೆ. ರಾಜ್ಯದಲ್ಲಿ 18-44 ವರ್ಷದವರಿಗೆ ಲಸಿಕೆಯನ್ನು ನೀಡುವ ಕಾರ್ಯಕ್ಕೆ ಮರು ಚಾಲನೆ ನೀಡಲಾಗುತ್ತಿದ್ದು, ಡಿಸೆಂಬರ್ ಒಳಗಾಗಿ ಎಲ್ಲರಿಗೂ ಲಸಿಕೆ ಕೊಡಿಸುವ ಪ್ರಯತ್ನ ಮಾಡಲಾಗುವುದು. ಜಿಲ್ಲೆಗೆ ಕೋವಿಡ್‍ಗೆ ನೀಡಲಾಗುವ ಯಾವುದೇ ಔಷಧಿಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿಲ್ಲ ಎಂದು ಸಚಿವ ಸುಧಾಕರ್ ಹೇಳಿದರು.
ಬ್ಲ್ಯಾಕ್ ಫಂಗಸ್ ಆತಂಕದ ಅಗತ್ಯವಿಲ್ಲ
ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಂಡುಬಂದಿದ್ದು, ಜಿಲ್ಲೆಯಲ್ಲಿಯೂ ಈವರೆಗೆ 15 ರಿಂದ 20 ಜನರಿಗೆ ಸೋಂಕು ಕಂಡುಬಂದಿದೆ. ಈ ಸೋಂಕಿಗೆ ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರಕುವಂತೆ ಮಾಡಲಾಗಿದೆ. ಸೋಂಕು ನಿವಾರಣೆಗೆ ಅಗತ್ಯವಿರುವ ಔಷಧಿ ಪೂರೈಕೆಗೂ ಕ್ರಮ ವಹಿಸಲಾಗಿದ್ದು, ಇದು ಸಾಂಕ್ರಾಮಿಕ ರೋಗವಲ್ಲ, ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ.
ರೋಗನಿರೋಧಕ ಶಕ್ತಿ ಕಡಿಮೆ ಇರುವವರು, ಕೋವಿಡ್ ಚಿಕಿತ್ಸೆಯಲ್ಲಿ ಅತಿಯಾದ ಸ್ಟಿರಾಯ್ಡ್ ಬಳಕೆ, ಅನಿಯಂತ್ರಿತ ಮಧುಮೇಹ ಮುಂತಾದ ಕಾರಣಗಳಿಂದ ಈ ಸೋಂಕು ಉಂಟಾಗುತ್ತಿದೆ. ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ ಹೊಂದಿರುವವರ ಆರೋಗ್ಯ ತಪಾಸಣೆಗೆ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಬಿಡುಗಡೆಯಾದ ದಿನದಿಂದ 03, 07, 15 ದಿನಗಳ ಅವಧಿಯಲ್ಲಿ ಅವರಿಗೆ ಯಾವ ಬಗೆಯ ಪರೀಕ್ಷೆ ಮಾಡಬೇಕು ಎಂಬುದನ್ನು ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ. ಬ್ಲ್ಯಾಕ್ ಫಂಗಸ್ ಸೋಂಕಿನ ಬಗ್ಗೆ ಮಾಧ್ಯಮಗಳು ದಯವಿಟ್ಟು ವೈಭವೀಕರಿಸುವ ಮೂಲಕ, ಈಗಾಗಲೆ ಕೋವಿಡ್‍ನಿಂದ ಮಾನಸಿಕವಾಗಿ ಆತಂಕದಲ್ಲಿರುವ ಸಮಾಜದಲ್ಲಿ ಇನ್ನಷ್ಟು ಭಯದ ವಾತಾವರಣ ಕಲ್ಪಿಸಬೇಡಿ ಎಂದು ಆರೋಗ್ಯ ಸಚಿವರು ಮನವಿ ಮಾಡಿದರು.
ವಿಧಾನಪರಿಷತ್ ಸದಸ್ಯ ಭೋಜೇಗೌಡ ಅವರು ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಸೋಂಕಿತರಿಗೆ ಯಾವುದೇ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ, ಯಾರು ಯಾವುದೇ ಮಟ್ಟದ ಪ್ರಭಾವ ಬಳಸಿದರೂ, ಬೆಡ್ ದೊರೆಯುತ್ತಿಲ್ಲ. ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಿಂದ ನಿಗದಿತ ಪ್ರಮಾಣದಲ್ಲಿ ಬೆಡ್ ಪಡೆಯದಿರುವುದನ್ನು ಪ್ರಸ್ತಾಪಿಸಿ, ಈ ನಿಟ್ಟಿನಲ್ಲಿ ಸಚಿವರು ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಶಿಕ್ಷಕರನ್ನು ಕೋವಿಡ್ ವಾರಿಯರ್ಸ್ ಎಂದು ಸರ್ಕಾರ ಪರಿಗಣಿಸಿದ್ದು, ಎಲ್ಲ ಶಿಕ್ಷಕರಿಗೂ ಲಸಿಕಾಕರಣ ಆಗಬೇಕು. ಜಿಲ್ಲೆಯಲ್ಲಿ ಇನ್ನೂ 700 ಕ್ಕೂ ಹೆಚ್ಚು ಶಿಕ್ಷಕರಿಗೆ ಲಸಿಕೆ ನೀಡಿಲ್ಲ. ಸೋಂಕಿತರ ಪ್ರಾಥಮಿಕ 10 ಹಾಗೂ ದ್ವಿತೀಯ ಹಂತದ 20 ಸಂಪರ್ಕಿತರಿಗೆ ಕೋವಿಡ್ ಟೆಸ್ಟ್ ಮಾಡಬೇಕು, ಆದರೆ ಜಿಲ್ಲೆಯಲ್ಲಿ ಇದು ಆಗುತ್ತಿಲ್ಲ. ಹೀಗಾಗಿ ಸೋಂಕು ಏರಿಕೆಯಾಗುತ್ತಿದೆ ಎಂದು ಅಸಮಾಧನ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಈಗಾಗಲೆ ಕೋವಿಡ್ ಕರ್ತವ್ಯದಲ್ಲಿರುವ ಸರ್ಕಾರಿ ನೌಕರರು, ಶಿಕ್ಷಕರು, ಆರೋಗ್ಯ ಕಾರ್ಯಕರ್ತರು, ಮಾಧ್ಯಮದವರು, ಬ್ಯಾಂಕ್ ಹಾಗೂ ರೈಲ್ವೆ ಸಿಬ್ಬಂದಿಗಳಿಗೆ ಲಸಿಕೆ ನೀಡುವಂತೆ ನಿರ್ದೇಶನ ನೀಡಲಾಗಿದೆ. ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಿಂದ ನಿಗದಿತ ಪ್ರಮಾಣದ ಬೆಡ್ ಗಳನ್ನು ಸರ್ಕಾರದ ಆದೇಶಕ್ಕೆ ಅನುಗುಣವಾಗಿ ತಪ್ಪದೆ ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಸಭೆಯಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರುಗಳಾದ ಮಾಡಾಳ್ ವಿರುಪಾಕ್ಷಪ್ಪ, ಎಸ್.ಎ. ರವೀಂದ್ರನಾಥ್, ಪ್ರೊ. ಲಿಂಗಣ್ಣ, ರಾಮಪ್ಪ, ಮಹಾನಗರಪಾಲಿಕೆ ಮಹಾಪೌರ ಎಸ್.ಟಿ. ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯತ್ ಸಿಇಒ ಡಾ. ವಿಜಯ ಮಹಾಂತೇಶ್, ಜೆಜೆಎಂಸಿ ಹಾಗೂ ಎಸ್‍ಎಸ್ ವೈದ್ಯಕೀಯ ಕಾಲೇಜುಗಳ ನಿರ್ದೇಶಕರು, ಪ್ರಾಂಶುಪಾಲರು, ಡಿಹೆಚ್‍ಒ ಡಾ. ನಾಗರಾಜ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆಯ ಬಾಷಾನಗರ,ಆನೆಕೊಂಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿ ನಂತರ ಮಾತನಾಡಿದರು.
ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರವಿದ್ದು, ಅದನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೆ ಎಂದ ಅವರು ಶಾಮನೂರು ಕುಟುಂಬವು ಸದಾ ಜನರ ಸಮಸ್ಯೆಗಳ ಪರಿಹಾರಕ್ಕೆ ನಿಂತುಕೊಳ್ಳುತ್ತದೆ ಎಂಬ ಭರವಸೆಯನ್ನೂ ನೀಡಿದರು.
ಪ್ರಚಾರದ ವೇಳೆ ಸ್ಥಳೀಯರು ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರ ಬಗ್ಗೆ ಜನರಿಗೆ ಭರವಸೆ ನೀಡಿದರು. ಜನರ ಹಕ್ಕುಪತ್ರದ ಸಮಸ್ಯೆಗಳು ಕುರಿತು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸಿದ್ದರು.ಈಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಜನರ ಎಲ್ಲಾ ಸಮಸ್ಯೆಗಳ ಪರಿಹಾರ ಮಾಡುತ್ತಿದ್ದಾರೆ ಎಂದರು.
ಯುವ ನಾಯಕ ಸಮರ್ಥ್ ಶಾಮನೂರು ಕುರಿತು ಮಾತನಾಡಿದ ಅವರು ಸಮರ್ಥ್ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವುದಾಗಿ ತಿಳಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿ, ಏಪ್ರಿಲ್ 9 ರಂದು ಮತಗಟ್ಟೆಗೆ ಬಂದು ಕ್ರಮ ಸಂಖ್ಯೆ 3ರ ‘ಹಸ್ತ’ ಚಿಹ್ನೆಗೆ ಮತ ಹಾಕಿ ಸಮರ್ಥ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 3 ವರ್ಷಗಳಾಗಿವೆ. ಈ ಅವಧಿಯ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ಕುರಿತ ಚಾರ್ಜ್ ಶೀಟನ್ನು ಇವತ್ತು ಬಿಡುಗಡೆ ಮಾಡಿದ್ದೇವೆ ಎಂದರು.
ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸುದ್ದಿಯಾಗಿದೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ಇದೆ. ಸರಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡರು. ಬಾಣಂತಿಯರು, ಹಸುಗೂಸುಗಳ ಸರಣಿ ಸಾವಿನ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಗೆ ಈ ಸರಕಾರ ಸುದ್ದಿಯಲ್ಲಿತ್ತು. ಅಂಗನವಾಡಿ ಶಿಕ್ಷಕಿಯರ ಚಳವಳಿ, ಆಶಾ ಕಾರ್ಯಕರ್ತೆಯರ ಚಳವಳಿ, ಅತಿಥಿ ಉಪನ್ಯಾಸಕರಿಂದ ಸಂಬಳ ಸಿಗುತ್ತಿಲ್ಲವೆಂದು ಹೋರಾಟ, ಗುತ್ತಿಗೆ ನೌಕರರ ಹೋರಾಟ- ಹೀಗೆ ಚಳವಳಿಗಳ ಕಾಟಕ್ಕೆ ಈ ಸರಕಾರ ಸುದ್ದಿಯಲ್ಲಿದೆ ಎಂದು ವ್ಯಂಗ್ಯವಾಡಿದರು.
ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ…
ಕಳೆದ 3 ವರ್ಷದಲ್ಲಿ ಕೆಟ್ಟ ಕಾರಣಕ್ಕಾಗಿ ಈ ಸರಕಾರ ಸುದ್ದಿಯಲ್ಲಿದೆಯೇ ಹೊರತು ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ವಿಶ್ಲೇಷಿಸಿದರು. ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಲಿಯಾದವರು ನೂರಾರು ಜನ; ರಸ್ತೆ ಗುಂಡಿ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಹೀಗೆ ಪ್ರತಿನಿತ್ಯ ಸರಕಾರ ಸುದ್ದಿಯಲ್ಲಿ ಇರುವುದು ಕೇವಲ ಕೆಟ್ಟ ಕಾರಣಕ್ಕಾಗಿ ಎಂದು ಆರೋಪಿಸಿದರು. ಅಭಿವೃದ್ಧಿ ಕೆಲಸ ಮಾಡಿದ್ದಕ್ಕಾಗಿ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ಆಕ್ಷೇಪಿಸಿದರು.
ಮುಡಾ, ವಾಲ್ಮೀಕಿ ನಿಗಮದ ಹಗರಣ ಮಾನಗೆಟ್ಟ ಕೆಲಸವಲ್ಲವೇ?
ಮುಖ್ಯಮಂತ್ರಿಗಳು ಬಿಜೆಪಿಯವರು ಮಾನಗೆಟ್ಟವರು ಎಂದು ಭಾಷಣದಲ್ಲಿ ಹೇಳಿದ್ದಾರೆ. ಯಾರು ಮುಖ್ಯಮಂತ್ರಿಗಳೇ ಮಾನಗೆಟ್ಟವರು? ಮುಡಾ ಹಗರಣ ಯಾರ ಮೇಲೆ ಬಂತು? ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ನಿಮ್ಮ ಸರಕಾರದ ಸಚಿವರೇ ರಾಜೀನಾಮೆ ಕೊಡಬೇಕಾಯಿತಲ್ಲವೇ? ಇದು ಮಾನಗೆಟ್ಟ ಕೆಲಸವಲ್ಲವೇ? ಎಂದು ಕೇಳಿದರು. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾದ ಹಣವನ್ನು ನಿಮ್ಮ ಒಬ್ಬ ಸಚಿವರು ಹೆಂಡತಿಗೆ ಒಡವೆ ಕೊಡಿಸಲು, ಚುನಾವಣೆಗೆ ಬಾರ್ ನಿಂದ ಎಣ್ಣೆ ಸರಬರಾಜು ಮಾಡಲು ಹಣ ಬಳಸಿದ್ದು ಮರ್ಯಾದೆ ಇದ್ದವರು ಮಾಡುವ ಕೆಲಸವೇ ಎಂದು ಕೇಳಿದರು.
ಮರ್ಯಾದೆ ಇದ್ದವರು ಅಧಿಕಾರಕ್ಕೆ ಅಂಟಿಕೊಳ್ಳುವರೇ?
ನೀವು ಬಿಜೆಪಿ ಮೇಲೆ ಶೇ 40 ಆರೋಪ ಹೊರಿಸಿ ಅಧಿಕಾರಕ್ಕೆ ಬಂದಿದ್ದೀರಿ. ಗುತ್ತಿಗೆದಾರರು ಶೇ 60 ಕಮಿಷನ್‍ನ ಸರಕಾರ ಎಂದು ನಿಮ್ಮ ಸರಕಾರದ ಮೇಲೆ ಆರೋಪ ಮಾಡಿದ್ದಾರಲ್ಲವೇ? ಮರ್ಯಾದೆ ಇದ್ದವರು ಆ ಆರೋಪ ಕೇಳಿಯೂ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮ್ಮ ಅಬಕಾರಿ ಸಚಿವರ ಮೇಲೆ ಬಾರ್ ಮಾಲೀಕರು ತಿಂಗಳ ಮಾಮೂಲಿ ಕೇಳುವ ಕುರಿತು ಆರೋಪ ಮಾಡಿದ್ದಾರಲ್ಲವೇ? ಇದು ಮರ್ಯಾದೆ ಇದ್ದವರು ಮಾಡುವ ಕೆಲಸವೇ? ಮಾನಗೆಟ್ಟವರು ಮಾಡುವ ಕೆಲಸವೇ ಎಂದು ಪ್ರಶ್ನೆ ಹಾಕಿದರು.
ಮುಖ್ಯಮಂತ್ರಿಗಳೇ, ಇಡೀ ಸಂಪುಟದಲ್ಲಿ ಮಾನಗೆಟ್ಟವರು ಇದ್ದಾರೆಯೇ ಹೊರತು ಮರ್ಯಾದೆ ಇದ್ದವರು ಯಾರಿದ್ದಾರೆ ಹೇಳಿ ಎಂದು ಕೇಳಿದರು. ಮಾನಗೆಟ್ಟ ಕೆಲಸ ಮಾಡುವವರನ್ನು ಸಚಿವರನ್ನಾಗಿ ಮಾಡಿಕೊಂಡು, ಶೇ 60ರ ಆರೋಪ ಹೊತ್ತುಕೊಂಡು ನೀವು ಬಿಜೆಪಿ ವಿರುದ್ಧ ಮಾನಗೆಟ್ಟ ಬಿಜೆಪಿ ಎಂದು ಆರೋಪ ಮಾಡುತ್ತೀರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
ನಿಮ್ಮದು ದರೋಡೆಕೋರ ಸರಕಾರವಲ್ಲವೇ?
ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿಕೆಗಳಾಗಿವೆ. ನಿಮ್ಮ ಸರಕಾರವನ್ನು ದರೋಡೆಕೋರ ಸರಕಾರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು. ನಿಮ್ಮ ಸರಕಾರ ಯಾವ್ಯಾವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂಬ ಪಟ್ಟಿ ಕೊಡಲೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ..
ನಂದಿನಿ ಹಾಲಿನ ದರ ಏರಿಕೆ ಮಾಡಿದ್ದೀರಿ. ಪೆಟ್ರೋಲ್ ಮೇಲೆ 3 ರೂ. ಸೆಸ್, ಡೀಸೆಲ್ ಮೇಲೆ 5.08 ರೂ. ಸೆಸ್ ಹಾಕಿದ್ದೀರಿ. ಕೇಂದ್ರ ಸರಕಾರ ದರ ಇಳಸಿದರೆ ನೀವು ಸೆಸ್ ಹಾಕಿ ಅವರ ಲಾಭ ಜನರಿಗೆ ಸಿಗದಂತೆ ಮಾಡಿದ್ದೀರಿ ಎಂದು ಟೀಕಿಸಿದರು. ಬಸ್ ಪ್ರಯಾಣ ದರ ಶೇ 15, ಮೆಟ್ರೋ ದರ ಶೇ 50ರಷ್ಟು ಹೆಚ್ಚಿಸಿದ್ದೀರಿ. ಪ್ರತಿ ಯೂನಿಟ್ 4.50 ರೂ. ವಿದ್ಯುತ್ ದರವನ್ನು ರೂ 5.90 ಮಾಡಿದ್ದೀರಿ. ವಾಣಿಜ್ಯ ದರವನ್ನು 7 ರೂ.ಗೂ ಹೆಚ್ಚಳ ಮಾಡಲಾಗಿದೆ. ಅಬಕಾರಿ ಸುಂಕವನ್ನು ಶೇ 20ರಷ್ಟು ಏರಿಸಿದ್ದೀರಿ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದೀರಿ. 20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ. ಅದರ ಜಾಗಕ್ಕೆ 100, 200 ರೂ.ಗಳ ಸ್ಟಾಂಪ್ ಪೇಪರ್ ಖರೀದಿಸಬೇಕಾಗಿದೆ. ನಮ್ಮ ಚಿನ್ನ ನಾವು ಒತ್ತೆ ಇಡಲು 0.5ರಷ್ಟು ಸ್ಟಾಂಪ್ ಡ್ಯೂಟಿ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ದಿನದ ಸುದ್ದಿ2 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ3 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ3 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ಅಂಕಣ1 day agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ2 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ1 day agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

