ಕ್ರೀಡೆ

ಬೆಳಗಿನ ಪ್ರಮುಖ ಸುದ್ದಿಗಳು

Published

on

ಬೆಳಗಿನ ಪ್ರಮುಖ ಸುದ್ದಿಗಳು

  1. ರಾಜ್ಯಗಳಿಗೆ ಜಿಎಸ್ಟಿ ಪರಿಹಾರ ವಿಸ್ತರಿಸುವ ಬಗ್ಗೆ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಚರ್ಚೆಯಾಗಿದೆ. ಆಗಸ್ಟ್‌ನಲ್ಲಿ ಇದರ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ.
  2. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪೌರ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಲು ನಿವೇಶನಕ್ಕಾಗಿ ಪುರಸಭೆಯ ಅಧೀನದಲ್ಲಿರುವ ಸ್ಥಳವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಶ್ರೀರಂಗಪಟ್ಟಣ ಪುರಸಭೆ ಮುಖ್ಯಾಧಿಕಾರಿಗೆ ಸೂಚನೆ ನೀಡಿದ್ದಾರೆ.
  3. ಮುಂಗಾರು ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಇಂದು(1-7-22) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿದ್ದು, ಇದರ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರದಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿವೆ.
  4. ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ನಿನ್ನೆ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನಾವೀಸ್ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಭಗತ್‌ಸಿಂಗ್ ಕೋಶಿಯಾರಿ ಉಭಯ ನಾಯಕರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
  5. ದೇಶದಲ್ಲಿ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು-ಎಂಎಸ್‌ಎಂಇ ವಲಯವನ್ನು ಉತ್ತೇಜಿಸಲು ಸರ್ಕಾರ ನೀತಿಯಲ್ಲಿ ಅಗತ್ಯ ಬದಲಾವಣೆ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿ ನಿನ್ನೆ ಉದ್ಯಮಿ ಭಾರತ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ 8 ವರ್ಷಗಳಲ್ಲಿ ಈ ವಲಯವನ್ನು ಬಲಪಡಿಸಲು ಬಜೆಟ್ ಅನುದಾನವನ್ನು ಶೇಕಡ 650ರಷ್ಟು ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
  6. ಭಾರತ ಮತ್ತು ಇಂಗ್ಲೆಂಡ್ ನಡುವಿನ ಪೂರ್ವನಿಗದಿತ 5ನೇ ಟೆಸ್ಟ್ ಕ್ರಿಕೆಟ್ ಪಂದ್ಯ ಬರ್ನಿಂಗ್ ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಇಂದು 3 ಗಂಟೆಗೆ ಆರಂಭಗೊಳ್ಳಲಿದೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತ 2-1ರ ಮುನ್ನಡೆಯಲಿದೆ. ಕಪಿಲ್‌ದೇವ್ ನಂತರ ಭಾರತದ ತಂಡವನ್ನು ಜಪ್ರೀತ್ ಬೂಮ್ರಾ ಮುನ್ನಡೆಸಲಿದ್ದಾರೆ.
  7. ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜತೆಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ನಡೆದ ಸಾಲುಮರದ ತಿಮ್ಮಕ್ಕನವರ 111ನೇ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ವಾರ್ತಾ ಇಲಾಖೆಯಿಂದ ಸಾಲುಮರದ ತಿಮ್ಮಕ್ಕ ಅವರ ವೆಬ್‌ಸೀರಿಸ್ ಮಾಡಲಾಗುವುದು ಎಂದು ಹೇಳಿದರು.
  8. ಇಳಕಲ್ ಡ್ಯಾಂ ಬಳಿ ನೂತನ ಮೃಗಾಲಯ ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಈಗಾಗಲೇ ಅನುಮತಿಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಉದ್ದೇಶಿತ 100 ಎಕರೆ ಪ್ರದೇಶದಲ್ಲಿ ಮೃಗಾಲಯ ನಿರ್ಮಾಣವಾದರೆ ಈ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಮೈಸೂರಿನಲ್ಲಿ ನಿನ್ನೆ ತಿಳಿಸಿದ್ದಾರೆ.
  9. ಕೊರೊನಾ ಸಾಂಕ್ರಾಮಿಕ ಕಾರಣ ಕಳೆದ ಎರಡು ವರ್ಷ ಸರಳ, ಸಂಪ್ರದಾಯ ಆಚರಣೆಗೆ ಮಾತ್ರ ಸೀಮಿತವಾಗಿದ್ದ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನ ಆಷಾಢ ಪೂಜೆ ಈ ಬಾರಿ ಅದ್ಧೂರಿಯಾಗಿ ನಡೆಯಲಿದೆ. ಇಂದು ಮೊದಲ ಆಷಾಢ ಶುಕ್ರವಾರವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆಗಳು ನಡೆಯುತ್ತಿದೆ. ಆಷಾಢ ಶುಕ್ರವಾರದಲ್ಲಿ ನಾಡದೇವತೆ ಚಾಮುಂಡಿಗೆ ವಿಶೇಷ ಪೂಜೆ ಪುರಸ್ಕಾರ ನೆರವೇರಲಿದೆ.
  10. ವ್ಯಾಪಾರ ಸುಧಾರಣಾ ಕಾರ್ಯ ಯೋಜನೆ-ಬಿಆರ್‌ಎಪಿ-2020 ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೆಹಲಿಯಲ್ಲಿ ನಿನ್ನೆ ಬಿಡುಗಡೆ ಮಾಡಿದರು. ಈ ಯೋಜನೆಯ ಅನುಷ್ಠಾನದ ಆಧಾರದ ಮೇಲೆ 7 ರಾಜ್ಯಗಳನ್ನು ಅಗ್ರಗಣ್ಯ ಸಾಧಕ ರಾಜ್ಯಗಳೆಂದು ವರದಿಯಲ್ಲಿ ಗುರುತಿಸಲಾಗಿದೆ. ಈ 7 ರಾಜ್ಯಗಳ ಪೈಕಿ ಕರ್ನಾಟಕವೂ ಸೇರಿದೆ.
  11. ಖಾದಿ ಮತ್ತು ಗ್ರಾಮೀಣ ಕೈಗಾರಿಕೆಗಳ ಉತ್ಪನ್ನಗಳ ವಹಿವಾಟು 1 ಲಕ್ಷ ಕೋಟಿ ರೂಪಾಯಿಯನ್ನು ಮೀರಿದೆ. ಕಳೆದ 8 ವರ್ಷಗಳಲ್ಲಿ ಖಾದಿ ಉತ್ಪನ್ನಗಳ ಮಾರಾಟ ನಾಲ್ಕು ಪಟ್ಟು ಹೆಚ್ಚಾಗಿದೆ. ಉದ್ಯಮಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ದುರ್ಬಲ ವರ್ಗದವರಿಗೆ ಖಾತರಿ ಇಲ್ಲದೆ ಸಾಲ ಪಡೆಯುವುದೇ ದುರ್ಲಬವಾಗಿದೆ. 2014ರ ನಂತರ ಸಬ್ ಕಾ ಸಾತ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮತ್ತು ಸಬ್ ಕಾ ಪ್ರಯಾಸ್ ಘೋಷ ವಾಕ್ಯದ ಮೂಲಕ ಉದ್ಯಮಗಳ ಸ್ಥಾಪನೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನವದೆಹಲಿಯಲ್ಲಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version