Connect with us

ದಿನದ ಸುದ್ದಿ

ಹೆದ್ದಾರಿ ಸರ್ವಿಸ್ ರಸ್ತೆಗಳನ್ನು ಪೂರ್ಣಗೊಳಿಸಲು ಸೂಚನೆ: ಸಂಸದ ಡಾ.ಜಿ.ಎಂ. ಸಿದ್ದೇಶ್ವರ

Published

on

ಸುದ್ದಿದಿನ,ದಾವಣಗೆರೆ : ಹೆದ್ದಾರಿಗೆ ಹೊಂದಿಕೊಂಡಿರುವ ಎಲ್ಲಾ ಸರ್ವಿಸ್ ರಸ್ತೆಗಳನ್ನು ಕಳೆದ ಅಕ್ಟೋಬರ್ ನಲ್ಲೆ ಪೂರ್ಣಗೊಳಿಸಲು ಕಾಲಮಿತಿ ಇದ್ದರೂ ಪೂರ್ಣಗೊಳ್ಳದ ಕಾರಣ ಇದರಿಂದ ಅಪಘಾತಗಳು ಸಂಭವಿಸಬಹುದಾಗಿದೆ. ಅಪಘಾತಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಎಲ್ಲಾ ಸರ್ವಿಸ್ ರಸ್ತೆಗಳನ್ನು ಪೂರ್ಣಗೊಳಿಸಬೆಕೆಂದು ಸಂಸದ ಡಾ. ಜಿ.ಎಂ ಸಿದ್ದೇಶ್ವರ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.

ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿಯ ಎಲ್ಲಾ ಸರ್ವಿಸ್‍ರಸ್ತೆಗಳು 2021ರ ಅಕ್ಟೋಬರ್‍ನಲ್ಲಿ ಮುಗಿಸಬೇಕೆಂದು ಗಡುವು ವಿಧಿಸಲಾಗಿತ್ತು. ಆದರೆ ನಾಲ್ಕು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ತಮ್ಮ ಅಸಮಧಾನ ವ್ಯಕ್ತ ಪಡಿಸಿದ ಸಂಸದರು ಅಧಿಕಾರಿಗಳು ಬೆಂಗಳೂರಲ್ಲಿ ಕೂತು ಎಲ್ಲದಕ್ಕೂ ಸರಿ ಅನ್ನುತ್ತೀರಾ, ಕಾಮಗಾರಿ ನಡೆಯುವ ಸ್ಥಳಕ್ಕೆ ಬಂದು ವೀಕ್ಷಣೆ ಮಾಡುವುದಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆ, ಬನಶಂಕರಿ ಬಡಾವಣೆ ಹತ್ತಿರ ಅಂಡರ್ ಪಾಸ್, ಹದಡಿ ಬ್ರಿಡ್ಜ್ ಹತ್ತಿರ ಸರ್ಕಲ್ ನಿರ್ಮಾಣವನ್ನು ಎಷ್ಟು ದಿನಗಳಲ್ಲಿ ಪೂರ್ಣಗೊಳಿಸುತ್ತೀರಿ ಎಂದು ಎನ್.ಹೆಚ್.ಎ.ಐ ಅಧಿಕಾರಿಗಳನ್ನು ಕೇಳಿದರು. ಎನ್.ಹೆಚ್.ಎ.ಐ ಅಧಿಕಾರಿ ಪ್ರತಿಕ್ರಿಯಿಸಿ ನಕ್ಷೆಯನ್ನು ಸಿದ್ಧಪಡಿಸಿ ಒಂದು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸುತ್ತೇವೆಂದು ತಿಳಿಸಿದರು.

ದಾವಣಗೆರೆ ನಗರಕ್ಕೆ ಚಿತ್ರದುರ್ಗ ಕಡೆಯಿಂದ ಬರುವಾಗ ಮುಖ್ಯ ಪ್ರವೇಶದ್ವಾರ ನಿರ್ಮಾಣ, ತುಂಗಭದ್ರಾ ಬಡಾವಣೆ ಹತ್ತಿರ ಸರ್ವಿಸ್ ರಸ್ತೆ ನಿರ್ಮಾಣ, ಮಲ್ಲಶೆಟ್ಟಿಹಳ್ಳಿ ಬಳಿ ಪಾದಾಚಾರಿ ಕೆಳಸೇತುವೆ ನಿರ್ಮಾಣ, ಶಾಮನೂರು ಹತ್ತಿರ ಸರ್ವಿಸ್ ರಸ್ತೆ, ಲಕ್ಕಮುತ್ತೇನಹಳ್ಳಿ ಮತ್ತು ನಿರ್ಥಡಿ ಹತ್ತಿರ ಮೇಲ್ಸೇತುವೆ ನಿರ್ಮಾಣದ ಬಗ್ಗೆ ಚರ್ಚಿಸಿದರು.

ನಗರದ ವಿದ್ಯಾನಗರ ಬಳಿ ಸರ್ವಿಸ್ ರಸ್ತೆಯಲ್ಲಿ ಹೈಟೆನ್ಷನ್ ವಿದ್ಯುತ್ ಲೈನ್‍ಗಳು ಇದ್ದು ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿರುವುದರಿಂದ ಅವುಗಳನ್ನು ಶಿಫ್ಟ್ ಮಾಡಲು ಅಗತ್ಯ ಕ್ರಮವಹಿಸುವಂತೆ ಸಂಸದರು ಸೂಚಿಸಿದರು. ಎನ್.ಹೆಚ್.ಎ.ಐ. ಅಧಿಕಾರಿ ಪ್ರತಿಕ್ರಿಯಿಸಿ ಸರ್ವಿಸ್ ರಸ್ತೆಯಲ್ಲಿರುವ ಹೈಟೆನ್ಷನ್ ವಿದ್ಯುತ್ ಲೈನ್ ಸ್ಥಳಾಂತರಿಸಲು ಅಗತ್ಯ ಕ್ರಮವಹಿಸಲಾಗುವುದೆಂದು ಹೇಳಿದರು.

ಜಿಲ್ಲಾಧಿಕಾರಿ ಮಹಾಂತೆಶ್ ಬೀಳಗಿ ಮಾತನಾಡಿ, ಮಲ್ಲಶೆಟ್ಟಿಹಳ್ಳಿ ಮತ್ತು ಕಲ್ಪನಹಳ್ಳಿ ಹತ್ತಿರ ಸರ್ವಿಸ್ ರಸ್ತೆ ಎನ್.ಹೆಚ್.ಎ.ಐ ಯುಟಿಲಿಟಿ ಕಾರಿಡಾರ್‍ನಲ್ಲಿ ಪೈಪ್ ಲೈನ್‍ಗಳಲ್ಲಿ ಅಳವಡಿಸುವ ಅಗತ್ಯವಿದ್ದು ಇದಕ್ಕೆ ಎನ್.ಹೆಚ್.ಎ.ಐ. ಪ್ರಾಧಿಕಾರದವರು ಅನುಮತಿ ನೀಡಬೇಕೆಂದು ತಿಳಿಸಿದರು. ಎನ್.ಹೆಚ್.ಎ.ಐ. ಅಧಿಕಾರಿಗಳು ಈಗಾಗಲೇ ಪೈಪ್‍ಗಳನ್ನು ಆಳವಡಿಸಲಾಗಿರುತ್ತದೆ. ಆದರೆ ಯುಟಿಲಿಟಿ ಕಾರಿಡಾರ್‍ನಲ್ಲಿ ಜಾಗ ಇರುವುದಿಲ್ಲ ಎಂದು ಸಭೆಗೆ ತಿಳಿಸಿದರು.

ಎನ್.ಹೆಚ್.ಎ.ಐ ಯೋಜನಾ ಅನುಷ್ಟಾನ ಘಟಕದ ಯೋಜನಾ ನಿರ್ದೇಶಕ ಶ್ರಿನಿವಾಸಲು ನಾಯ್ಡು ಮಾತನಾಡಿ, ಅಕ್ಟೋಬರ್‍ನಲ್ಲಿ ಕಾಮಗಾರಿಯನ್ನು ಶುರುಮಾಡಿ ನಂತರ ಒಂದು ವರ್ಷದಲ್ಲಿ ಕಾಮಗಾರಿಗಳನ್ನು ಮುಗಿಸಲಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ ರಿಷ್ಯಂತ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending