ದಿನದ ಸುದ್ದಿ
ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ | ಪ್ರಧಾನಿ ಅವರೊಂದಿಗೆ ಅರಮನೆ ಎದುರು 15 ಸಾವಿರ ಜನರಿಂದ ಯೋಗಾಭ್ಯಾಸಕ್ಕೆ ಸಿದ್ಧತೆ : ಸಿಎಂ ಬಸವರಾಜ ಬೊಮ್ಮಾಯಿ
ಸುದ್ದಿದಿನ ಡೆಸ್ಕ್ : ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ಇದೇ 21ರಂದು ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು, ಅರಮನೆ ಎದುರು 15 ಸಾವಿರ ಜನರು ಯೋಗ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಬೆಂಗಳೂರಿನಲ್ಲಿ ನಿನ್ನೆ ಪೂರ್ವಸಿದ್ಧತಾ ಸಭೆ ನಡೆಸಿ, 15 ಸಾವಿರ ಯೋಗಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಇದೇ 13ರೊಳಗೆ ಪೂರ್ಣಗೊಳಿಸುವಂತೆ ಮೈಸೂರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನ ಮಂತ್ರಿಗಳ ಕಚೇರಿ ಸೂಚಿಸಿದಂತೆ ಸಮಾಜದ ಎಲ್ಲ ವರ್ಗಗಳ ಜನರನ್ನೂ ಸೇರ್ಪಡೆಗೊಳಿಸಬೇಕು ಎಂದರು.
ಕೇಂದ್ರ ಆಯುಷ್ ಸಚಿವಾಲಯವು ಯೋಗಕ್ಕೆ ಸಂಬಂಧಿಸಿದಂತೆ ವಸ್ತು ಪ್ರದರ್ಶನವನ್ನು ಸಹ ಏರ್ಪಡಿಸಲಿದೆ. ಈ ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಕೋರ್ ಕಮಿಟಿ ಸೇರಿ ಒಟ್ಟು 14 ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಸೂಚಿಸಿದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ 75 ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ 5 ತಾಣಗಳಾದ ಮೈಸೂರು, ಹಳೇಬೀಡು, ಹಂಪಿ, ಪಟ್ಟದಕಲ್ ಹಾಗೂ ವಿಜಯಪುರದ ಗೋಲಗುಂಬಜ್ ಈ ಕಾರ್ಯಕ್ರಮಕ್ಕೆ ಆಯ್ಕೆಯಾಗಿದೆ ಎಂದರು.
75 ಐತಿಹಾಸಿಕ ಸ್ಥಳಗಳಲ್ಲಿ ಯೋಗ ದಿನಾಚರಣೆ
ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಹಳೇಬೀಡಿನಲ್ಲಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ, ಹಂಪಿಯಲ್ಲಿ ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಷಿ, ಪಟ್ಟದಕಲ್ಲಿನಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ವಿಜಯಪುರದ ಗೋಲಗುಂಬಜ್ ನಲ್ಲಿ ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಪಾಲ್ಗೊಳ್ಳಲಿದ್ದಾರೆ.
ಇದಲ್ಲದೆ ರಾಜ್ಯ ಮಟ್ಟದಲ್ಲಿ ರಾಜ್ಯದ 75 ಐತಿಹಾಸಿಕ ಸ್ಥಳಗಳಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243