Connect with us

ದಿನದ ಸುದ್ದಿ

ದಾವಣಗೆರೆ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ | ಅರ್ಹರಿಗೆ ಸರ್ಕಾರಿ ಸೌಲಭ್ಯಗಳ ವಿತರಣೆಯಲ್ಲಿ ಮದ್ಯವರ್ತಿಗಳ ಹಾವಳಿ ತಡೆಗಟ್ಟಲು ಕ್ರಮ : ಮಹಾಂತೇಶ್ ಬೀಳಗಿ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಜಗಳೂರು ತಾಲ್ಲೂಕು ಗಡಿ ಭಾಗದ ಅಂಚಿನಲ್ಲಿರುವ ಬಸವನಕೋಟೆ ಹಾಗೂ ಅಗಸನಹಳ್ಳಿ ಗ್ರಾಮಗಳು ಜಿಲ್ಲೆಯ ಆಡಳಿತದ ಮುಖ್ಯಸ್ಥರ ಸ್ವಾಗತಕ್ಕೆ ತಳಿರು ತೋರಣಗಳಿಂದ ನವವಧುವಿನಂತೆ ಸಿಂಗಾರಗೊಂಡಿದ್ದವು.

ಉಭಯ ಗ್ರಾಮಗಳಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ಕಟೌಟ್‍ಗಳು ರಾರಾಜಿಸುತ್ತಿದ್ದವು. ಗ್ರಾಮದ ಸಮಸ್ಯೆಗಳ ಪರಿಹಾರದ ನಿರೀಕ್ಷೆಯ ಕಣ್ಣುಗಳು ಜಿಲ್ಲಾಧಿಕಾರಿಗಳ ಬರುವಿಕೆಯ ಹಾದಿಯನ್ನೇ ಎದುರು ನೋಡುತ್ತಿದ್ದವು.

ಕೆಲವು ಜನರ ಕೈಯಲ್ಲಿ ಸರ್ಕಾರಿ ಸವಲತ್ತು ಪಡೆಯಲು ವಯಕ್ತಿಕ ಅರ್ಜಿಗಳಿದ್ದರೆ, ಇನ್ನು ಕೆಲವರ ಕೈಯಲ್ಲಿ ಗ್ರಾಮದ ಜನರ ಹಿತಾಸಕ್ತಿಗಾಗಿ ಅಗತ್ಯವಿರುವ ಅಭಿವೃದ್ಧಿ ಕಾರ್ಯಗಳ ಬೇಡಿಕೆಯನ್ನು ಹೊತ್ತ ಅರ್ಜಿಗಳಿದ್ದವು.

ಇದು ‘ಜಿಲ್ಲಾಧಿಕಾರಿಗಳ ನಡಿಗೆ- ಗ್ರಾಮಗಳ ಕಡೆಗೆ’ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಏರ್ಪಡಿಸಲು ಸರ್ಕಾರ ಆದೇಶಿಸಿದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಡಳಿತ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕಾಗಿ ನಿಗದಿಪಡಿಸಲಾಗಿದ್ದ ಬಸವನಕೋಟೆ ಹಾಗೂ ಅಗಸನಹಳ್ಳಿ ಗ್ರಾಮಗಳಲ್ಲಿ ಶನಿವಾರ ಕಂಡುಬಂದ ದೃಶ್ಯಗಳಿವು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ತಮ್ಮ ವಾಹನವನ್ನು ಬಿಟ್ಟು, ಜಿಲ್ಲಾ ಮಟ್ಟದ ಎಲ್ಲ ಇಲಾಖಾ ಅಧಿಕಾರಿಗಳ ಸಮೇತ ಕೆಎಸ್‍ಆರ್‍ಟಿಸಿ ಬಸ್ ಮೂಲಕವೇ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕಾಗಿ ಬಸವನಕೋಟೆ ಗ್ರಾಮಕ್ಕೆ ಆಗಮಿಸಿದರು. ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಭವ್ಯ ಸ್ವಾಗತವನ್ನೇ ಏರ್ಪಡಿಸಿದ್ದರು.

ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ ಪ್ರಸಕ್ತ ವರ್ಷದ ಮೊದಲ ಗ್ರಾಮ ವಾಸ್ತವ್ಯ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮವನ್ನು ಜಗಳೂರು ತಾಲ್ಲೂಕು ಬಸವನಕೋಟೆಯ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಉದ್ಘಾಟಿಸಿದರು.

ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಹಳ್ಳಿಯ ಕಡೆ ಹೆಜ್ಜೆ ಹಾಕಿರುವ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಮೊದಲು ಜಗಳೂರಿನ ಬಸವನಕೋಟೆ ಗ್ರಾಮದಲ್ಲಿ ಕಾರ್ಯಕ್ರಮವನ್ನು ಆರಂಭಿಸಿದರು, ನಂತರ ಅಗಸನಹಳ್ಳಿಯಲ್ಲಿ ವಾಸ್ತವ್ಯ ಹೂಡಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದರು.
ಪ್ರತಿ ತಿಂಗಳು ಮೂರನೇ ಶನಿವಾರ ಎಲ್ಲಾ ಜಿಲ್ಲಾಧಿಕಾರಿಗಳು ಗ್ರಾಮದಲ್ಲಿ ವಾಸ್ತವ್ಯ ಮಾಡಬೇಕು ಎಂಬ ಸರ್ಕಾರದ ಮಾರ್ಗಸೂಚಿಯಂತೆ ಈ ಬಾರಿ ಜಗಳೂರು ತಾಲ್ಲೂಕಿನ ಅಗಸನಹಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದು, ಬಸವನಕೋಟೆ ಗ್ರಾಮದ ಜನರಿಂದ ಅಹವಾಲನ್ನು ಸ್ವೀಕರಿಸಿ ಸಾಧ್ಯವಾದಲ್ಲಿ ಇಲ್ಲಿಯೇ ಪರಿಹಾರ ಸೂಚಿಸುತ್ತೇವೆ ಎಂದು ಭರವಸೆ ಮೂಡಿಸಿದರು.

ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಬೇಕೆಂದರೂ ಮಧ್ಯವರ್ತಿಗಳು ಹಾಗೂ ಏಜೆಂಟರ ಹಾವಳಿ ಹೆಚ್ಚಾಗಿದ್ದು, ಅವರಿಗೆ ಹಣ ನೀಡದಿದ್ದರೆ ಕೆಲಸ ಆಗುವುದಿಲ್ಲ ಎಂಬ ಅಪವಾದವಿದೆ. ಈ ಕಾರಣದಿಂದ ಏಜೆಂಟರು ಹಾಗೂ ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಸರ್ಕಾರದ ಎಲ್ಲಾ ಸವಲತ್ತುಗಳನ್ನು ಯಾವುದೇ ಖರ್ಚಿಲ್ಲದೇ ನೇರವಾಗಿ ನಿಮ್ಮ ಬಾಗಿಲಿಗೆ ತಲುಪಿಸುವ ಸದ್ದುದ್ದೇಶದಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಗ್ರಾಮದ ಕೇರಿ ಕೇರಿಗೂ ಓಡಾಡಿ ಖುದ್ದಾಗಿ ಸಾರ್ವಜನಿಕರಿಂದ ಅಲ್ಲಿಯ ಸಮಸ್ಯೆಗಳು, ವಾಸ್ತವತೆ ಕುರಿತು ತಿಳಿದುಕೊಂಡಿದ್ದೇನೆ. ಗ್ರಾಮಸ್ಥರು ತಮಗೆ ಸಿಗುವ ಸವಲತ್ತುಗಳ ಕುರಿತು ಪ್ರಾಮಾಣಿಕವಾಗಿ ಹೇಳಿದ್ದು, ಸಮಸ್ಯೆಗಳನ್ನು ತಿಳಿಸಿದ್ದಾರೆ. ಈ ಗ್ರಾಮದಲ್ಲಿ ಸರ್ಕಾರದಿಂದ ಸಿಗುವ ಸೌಲಭ್ಯಗಳ ಸತ್ಯ ದರ್ಶನವಾಗಿದೆ. ಗ್ರಾಮದಲ್ಲಿ ಸಾಕಷ್ಟು ಕೆಲಸ ಮಾಡಲು ಬಾಕಿ ಉಳಿದಿದ್ದು ಅದನ್ನು ಪೂರೈಸಲು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕಂದಾಯ ಇಲಾಖೆಗೆ ಸಂಬಂಧಿಸಿದಂತೆ, ಸಂಧ್ಯಾ ಸುರಕ್ಷಾ ಯೋಜನೆಯಡಿ ಬಸವನಕೋಟೆಯಲ್ಲಿ 23 ಅರ್ಜಿ, ಅಗಸನಹಳ್ಳಿ ಗ್ರಾಮದಲ್ಲಿ 8 ಅರ್ಜಿ ಸೇರಿದಂತೆ ಒಟ್ಟು 31 ಅರ್ಜಿ ಬಂದಿದ್ದು ಅದರ ಮಂಜೂರಾತಿ ಆದೇಶಗಳನ್ನು ಫಲಾನುಭವಿಗಳಿಗೆ ನೀಡಲಾಗುತ್ತಿದೆ. ವೃದ್ಧಾಪ್ಯ ವೇತನ ಯೋಜನೆಯಡಿ ಬಸವನಕೋಟೆಯಲ್ಲಿ 31, ಅಗಸನಹಳ್ಳಿಯಲ್ಲಿ 07 ಸೇರಿದಂತೆ ಒಟ್ಟು 38 ಅರ್ಜಿಗಳು ಬಂದಿದ್ದು, ಅರ್ಹರೆಲ್ಲರಿಗೂ ಮಂಜೂರಾತಿ ಆದೇಶ ನೀಡಲಾಗುವುದು.

ಇನ್ನು ವಿಧವವೇತನ ಯೋಜನೆಯಡಿ ಬಸವನಕೋಟೆಯಲ್ಲಿ 4, ಅಗಸನಹಳ್ಳಿಯಲ್ಲಿ 01, ಒಟ್ಟು 5 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು ಮಂಜೂರು ಆದೇಶಗಳನ್ನು ನೀಡಲಾಗುವುದು ಹಾಗೂ 03 ಅಂಗವಿಕಲರ ಮಾಸಾಶನ ಮಂಜೂರಾತಿ ನೀಡಲಾಗುವುದು ಎಂದರು.

ಜಿಲ್ಲಾಧಿಕಾರಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿಯ ಗ್ರಾಮಸ್ಥರು ಮಗುವೊಂದನ್ನು ತೋರಿಸಿ ಮಗುವಿನ ಖಾಯಿಲೆ ಗುಣಮುಖ ಮಾಡಲು ಖಾಸಗಿ ಆಸ್ಪತ್ರೆಗೆ ಸೇರಿಸಿ ಇಂಜೆಕ್ಷನ್ ಮಾಡಿಸಿದ್ದರ ಪರಿಣಾಮ ಇಂದು ವಾಸಿಮಾಡಲಾಗದ ಸ್ಥಿತಿಗೆ ತಲುಪಿದೆ. ಚಿಕಿತ್ಸೆ ನೀಡಿ ಗುಣಮುಖರಾಗಲು ಸಾಧ್ಯವೇ ಇಲ್ಲದಂತಾಗಿದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದು, ಮಗುವಿನ ಸಂಪೂರ್ಣ ಚಿಕಿತ್ಸೆಗಾಗಿ ಜಿಲ್ಲಾಡಳಿತದ ವತಿಯಿಂದ ದಾವಣಗೆರೆಯ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಮೂಲಕ ಗುಣಮುಖರನ್ನಾಗಿ ಮಾಡಲು ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದರು.

ಈ ಗ್ರಾಮದಲ್ಲಿ ಬಹಳಷ್ಟು ಜನ ಅಂಗವಿಕಲರ ವೇತನ ತೆಗೆದುಕೊಳ್ಳುತ್ತಿದ್ದಾರೆ. ಅವರ ಪೈಕಿ ಕೆಲವರು ಶೇ.75 ಕ್ಕಿಂತ ಹೆಚ್ಚು ಜನರು ಅಂಗವೈಕಲ್ಯವಿದ್ದರು ಸಹ ಸರಿಯಾದ ಪ್ರಮಾಣಪತ್ರ ಸಿಗದೆ ಸರ್ಕಾರಿ ಸವಲತ್ತುಗಳಿಂದ ವಂಚಿತರಾಗುತ್ತಿದ್ದಾರೆ. ರೂ. 1400 ಪಿಂಚಣಿ ಪಡೆಯಲು ಈ ಗ್ರಾಮದಲ್ಲಿ ಸುಮಾರು 6-7 ಜನರು ಅರ್ಹರಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಎಲ್ಲಾ ಸೌಲಭ್ಯಗಳನ್ನು ವಿಳಂಬ ರಹಿತವಾಗಿ ವಿತರಿಸಲಾಗುತ್ತದೆ ಎಂದರು.

ಈ ಊರಿಗೆ ಅನೇಕ ಕೆಲಸ ಮಾಡಲು ಬಾಕಿ ಇದ್ದು ರಸ್ತೆ, ಚರಂಡಿ ಸ್ವಚ್ಚತೆ, ರಾಜಕಾಲುವೆ ನಿರ್ಮಾಣ, ಆಸ್ಪತ್ರೆಯಲ್ಲಿ ವೈದ್ಯರನ್ನು ಒದಗಿಸಲಾಗುವುದು. ಹಾಗೂ ಈ ಗ್ರಾಮದಿಂದ ಹರಪನಹಳ್ಳಿ, ಉಜ್ಜಯಿನಿ, ಕೊಟ್ಟೂರು ಮತ್ತು ದಾವಣಗೆರೆಗೆ ಸರ್ಕಾರಿ ಬಸ್ಸಿನ ಸೌಲಭ್ಯಗಳನ್ನು ನೀಡುವ ವ್ಯವಸ್ಥೆಯನ್ನು ಒದಗಿಸಲು ಜಿಲ್ಲಾಡಳಿತ ಮುಂದಾಗಿದ್ದು, ಇದರಿಂದ ಅನೇಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಮಾದರಿಯಾಗಲಿದೆ ಎಂದು ವಿದ್ಯಾರ್ಥಿಗಳಲ್ಲಿ ಹಾಗೂ ಗ್ರಾಮಸ್ಥರಲ್ಲಿ ಭರವಸೆ ಮೂಡಿಸಿದರು.

ಜಿಲ್ಲಾ ಕೇಂದ್ರದಲ್ಲಿ ಅನೇಕ ವಸತಿ ಸೌಲಭ್ಯಗಳಿದ್ದು ವಿದ್ಯಾರ್ಥಿಗಳು ದಾವಣಗೆರೆಯತ್ತ ಮುಖ ಮಾಡಿ ಹೆಚ್ಚಿನ ಶಿಕ್ಷಣ ಪಡೆದು ಉನ್ನತ ಮಟ್ಟಕ್ಕೆ ಏರಬೇಕು. ಅಲ್ಲದೇ ಈ ಗ್ರಾಮಗಳಲ್ಲಿ ಖಾಸಗಿ ಬಸ್ಸುಗಳ ಹಾವಳಿ ತುಸು ಹೆಚ್ಚಾಗೆ ಇದ್ದು, ಮುಂದಿನ ದಿನಗಳಲ್ಲಿ ಜನರ ಅನುಕೂಲಕ್ಕಾಗಿ ಸರ್ಕಾರಿ ಬಸ್ಸುಗಳ ಸವಲತ್ತುಗಳನ್ನು ಒದಗಿಸಲು ಕೆಎಸ್‍ಆರ್‍ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending