Connect with us

ದಿನದ ಸುದ್ದಿ

ಜನರ ಮನೆ ಬಾಗಿಲಲ್ಲೇ ಸರ್ಕಾರವಿದೆ : ಡಿಸಿ ಮಹಾಂತೇಶ್ ಬೀಳಗಿ

Published

on

ಸುದ್ದಿದಿನ,ದಾವಣಗೆರೆ : ಸರ್ಕಾರಿ ಯೋಜನೆಗಳ ಸವಲತ್ತುಗಳನ್ನು ಜನರ ಬಳಿಗೇ ತೆರಳಿ ವಿತರಣೆ ಮಾಡುವ ಮೂಲಕ, ಜನರ ಮನೆ ಬಾಗಿಲಲ್ಲೇ ಸರ್ಕಾರವಿದೆ ಎಂಬ ಭಾವನೆಯನ್ನು ಸಾರ್ವಜನಿಕರಲ್ಲಿ ಮೂಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಜಿಲ್ಲಾಡಳಿತ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

ಜಗಳೂರು ತಾಲ್ಲೂಕಿನ ಬಿದರಕೆರೆ ಗ್ರಾಮದ ಗುರುಸಿದ್ದೇಶ್ವರ ಪ್ರೌಢಶಾಲೆ ಆವರಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಹಣಿ, ಪಿಂಚಣಿ, ಮಾಸಾಶನ, ವಿಕಲಚೇತನರ ಮಾಸಾಶನ ಸೇರಿದಂತೆ ಸರ್ಕಾರದ ವಿವಿಧ ಸವಲತ್ತುಗಳನ್ನು ವಿತರಿಸಲು ಜಿಲ್ಲಾಡಳಿತವೇ ಫಲಾನುಭವಿಗಳನ್ನು ಹುಡುಕಿ, ಅವರ ಮನೆಗೇ ತಲುಪಿಸುವಂತಹ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಈ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಪೂರಕವಾಗಿದೆ.

ಹಸಿವು ಎಂದರೆ ಏನು ಎಂದು ಅರಿಯದವರು,
ಶ್ರೀಮಂತಿಕೆಯಲ್ಲಿಯೇ ಹುಟ್ಟಿ ಬೆಳೆದವರು ಬಡತನ, ಹಸಿವು ಕುರಿತು ಉದ್ದುದ್ದ ಭಾಷಣ ಮಾಡುತ್ತಾರೆ, ಅಂತಹವರು ಹಸಿವು ನಿವಾರಣೆ ಕುರಿತಂತೆ ಪಿಹೆಚ್‍ಡಿ ಯನ್ನೂ ಕೂಡ ಪಡೆಯುತ್ತಾರೆ. ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತುಕೊಂಡು ಆಡಳಿತ ನಡೆಸುವ ಕಾಲ ಈಗಿಲ್ಲ. ದೇಶದ ಆತ್ಮ ಹಳ್ಳಿಗಳಲ್ಲಿದೆ.

ಇದನ್ನು ಅರಿತೇ ಸರ್ಕಾರ ಗ್ರಾಮ ವಾಸ್ತವ್ಯದಂತಹ ಮಹತ್ವದ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದು, ಕೇವಲ ಹಳ್ಳಿಗೆ ಬಂದು ಭಾಷಣ ಮಾಡಿ ಹೋಗುವುದು ಗ್ರಾಮವಾಸ್ತವ್ಯದ ಉದ್ದೇಶವಲ್ಲ. ಗ್ರಾಮ ವಾಸ್ತವ್ಯ ಮಾಡುವ ಗ್ರಾಮ ಸುತ್ತಮುತ್ತಲ ಸುಮಾರು ಐದಾರು ಹಳ್ಳಿಗಳಲ್ಲಿ, ಪ್ರತಿ ಮನೆ ಮನೆಗೆ ಅಧಿಕಾರಿ, ಸಿಬ್ಬಂದಿ ಭೇಟಿ ನೀಡಿ, ಪಿಂಚಣಿ, ಮಾಸಾಶನ, ವಿಕಲಚೇತನರ ಮಾಸಾಶನಕ್ಕೆ ಯಾರು ಅರ್ಹರಿದ್ದಾರೆ, ಅವರಿಗೆ ಸವಲತ್ತು ದೊರೆತಿದೆಯೇ ಇಲ್ಲವೆ, ಯೋಜನೆಗಾಗಿ ಯಾರು ಅರ್ಹ ಫಲಾನುಭವಿಗಳಿದ್ದಾರೆ ಎಂಬುದನ್ನು ಗುರುತಿಸಲು ಸರ್ವೆ ಮಾಡಿಸಲಾಗುತ್ತಿದೆ.

ಅರ್ಹರಿದ್ದೂ, ಸವಲತ್ತಿನಿಂದ ವಂಚಿತರಾಗಿದ್ದಲ್ಲಿ, ಅಂತಹವರಿಗೆ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಸೌಲಭ್ಯ ಮಂಜೂರು ಮಾಡಲಾಗುತ್ತಿದೆ. ಇವೆಲ್ಲವೂ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ, ಅರ್ಹರಿಗೆ ಯೋಜನೆಯನ್ನು ತಲುಪಿಸುವ ಮೂಲಕ, ಜನರ ಮನೆ ಬಾಗಿಲಲ್ಲೇ ಸರ್ಕಾರವಿದೆ ಎಂಬ ಭಾವನೆಯನ್ನು ಸಾರ್ವಜನಿಕರಲ್ಲಿ ಮೂಡಿಸುವ ಯತ್ನ ಮಾಡುತ್ತಿದ್ದೇವೆ.

ಬಿದರಕೆರೆ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಸುಮಾರು 12 ವಿಕಲಚೇತನ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಮಾಸಾಶನ ಮಂಜೂರು ಮಾಡಿಸುವ ಕಾರ್ಯ ಮಾಡಿದ್ದೇವೆ. ಮನೆ ಮನೆ ಸಮೀಕ್ಷೆ ಸಂದರ್ಭದಲ್ಲಿ ವ್ಯಾಪ್ತಿಯಿಂದ ಹೊರಗುಳಿದವರೂ ಕೂಡ, ಗ್ರಾಮವಾಸ್ತವ್ಯ ಕಾರ್ಯಕ್ರಮ ಸಂದರ್ಭದಲ್ಲಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಕೂಡ ಮಾಡಿದ್ದೇವೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ತಲುಪಿದಾಗ ಮಾತ್ರ ಇಂತಹ ಕಾರ್ಯಕ್ರಮಗಳ ಉದ್ದೇಶ ಈಡೇರಲು ಸಾಧ್ಯ.

ಕೋವಿಡ್ ಸೋಂಕು ನಿಯಂತ್ರಣ ಸಂದರ್ಭದಲ್ಲಿ ಜಿಲ್ಲೆಯ ಜನರು ಒಳ್ಳೆಯ ರೀತಿಯಲ್ಲಿ ಸಹಕರಿಸಿದ್ದಾರೆ. ಮುಂಬರುವ ತಿಂಗಳುಗಳಲ್ಲಿ ನಾಲ್ಕನೆ ಅಲೆ ಬರುತ್ತದೆ ಎಂಬ ಮಾತು ಕೇಳಿಬರುತ್ತಿದೆ. ಈಗಾಗಲೆ ಅರ್ಹರೆಲ್ಲರಿಗೂ ಕೋವಿಡ್ ನಿರೋಧಕ ಲಸಿಕೆ ನೀಡಲಾಗಿದೆ. ಎಷ್ಟೇ ಅಲೆ ಬಂದರೂ, ಜನರ ಸಹಕಾರವಿದ್ದಲ್ಲಿ, ಉತ್ತಮವಾಗಿ ನಿಭಾಯಿಸಲು ಜಿಲ್ಲಾಡಳಿತ ಸಿದ್ಧವಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಅವರು ಮಾತನಾಡಿ, ಸರ್ಕಾರದಲ್ಲಿ ನಾನೂ ಒಬ್ಬ ಕೆಲಸಗಾರ, ಹೀಗಾಗಿ ಕ್ಷೇತ್ರದ ಜನರ ಒಳಿತಿಗಾಗಿ ನಿರಂತರವಾಗಿ ದುಡಿಯುತ್ತಿದ್ದೇನೆ. ಅಧಿಕಾರ ಶಾಶ್ವತವಲ್ಲ, ನಾವು ನೀಡುವ ಕಾರ್ಯಕ್ರಮಗಳು ಶಾಶ್ವತ. ಮುಖ್ಯಮಂತ್ರಿಗಳು ಏ. 29 ರಂದು ಜಗಳೂರು ಕ್ಷೇತ್ರಕ್ಕೆ ಆಗಮಿಸಲಿದ್ದು, ಅಂದು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು.

57 ಕೆರೆಗಳನ್ನು ತುಂಬಿಸುವ ಯೋಜನೆ ಜೊತೆಗೆ 1236 ಕೋಟಿ ರೂ. ವೆಚ್ಚದ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗೂ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಇದರಲ್ಲಿ ಬಿದರಕೆರೆ ಗ್ರಾಮಕ್ಕೂ ನೀರು ಹರಿದುಬರುವಂತೆ ಯೋಜನೆ ರೂಪಿಸಲಾಗಿದೆ. ಮೂರು ಬಾರಿ ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ್ದು, ಕ್ಷೇತ್ರದ ಜನರ ಋಣ ತೀರಿಸುವುದು ನನ್ನ ಕರ್ತವ್ಯವಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚನ್ನಪ್ಪ ಮಾತನಾಡಿ, ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸಂದರ್ಭದಲ್ಲಿ ನಿವೇಶನ, ಮನೆ ಸೌಲಭ್ಯ ನೀಡುವಂತೆ 100 ಕ್ಕೂ ಹೆಚ್ಚು ಜನ ಅರ್ಜಿ ಸಲ್ಲಿಸಿದ್ದಾರೆ. ನಿವೇಶನ ರಹಿತರ ಸಮೀಕ್ಷೆ ಕಾರ್ಯ ಕೈಗೊಂಡಿದ್ದು, ಗ್ರಾಮದಲ್ಲಿ 300 ಕ್ಕೂ ಹೆಚ್ಚು ನಿವೇಶನ ರಹಿತರನ್ನು ಗುರುತಿಸಲಾಗಿದೆ. ಇವರೆಲ್ಲರಿಗೂ ನಿವೇಶನ ನೀಡಲು ಸುಮಾರು 8 ಎಕರೆ ಭೂಮಿ ಅಗತ್ಯವಿದೆ. ಗ್ರಾಮ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ, ಗಾಂವಠಾಣವಾಗಲೀ ಇಲ್ಲ. ಯಾರಾದರೂ ಜಮೀನು ಮಾಲೀಕರು ಭೂಮಿ ನೀಡಲು ಮುಂದೆ ಬಂದರೆ, ಸರ್ಕಾರದ ದರಕ್ಕಿಂತ ದುಪ್ಪಟ್ಟು ಬೆಲೆ ನೀಡಿ, ಭೂಮಿ ಖರೀದಿಸಲು ನಿಗಮ ಸಿದ್ಧವಿದೆ ಎಂದರು.

ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಮಾತನಾಡಿ, ಜನರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಕಾನೂನಿನ ವ್ಯಾಪ್ತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸುವ ಮತ್ತು ಜನಸ್ನೇಹಿ ಆಡಳಿತ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವೃದ್ಯಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನಗಳನ್ನು ಅರ್ಹರಿಗೆ ತಲುಪಿಸಲಾಗುತ್ತಿದೆ. ಗ್ರಾಮಕ್ಕೆ ಸ್ಮಶಾನ ಸೌಲಭ್ಯ ವ್ಯವಸ್ಥೆ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

ಸರ್ಕಾರದ ಯೋಜನೆಗಳು ಯಾವ ರೀತಿ ಅನುಷ್ಠಾನವಾಗುತ್ತಿದೆ ಎಂಬುದನ್ನು ಪರಿಶೀಲಿಸಲು ಗ್ರಾಮ ವಾಸ್ತವ್ಯ ಸಹಕಾರಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ವಿವಿಧ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳ ಮಂಜೂರಾತಿ ಪತ್ರ, ಹಕ್ಕುಪತ್ರಗಳನ್ನು ವಿತರಿಸಲಾಯಿತು. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಫಲಾನುಭವಿಗಳಿಗೆ ಉಚಿತ ಪಡಿತರ ವಿತರಿಸಲಾಯಿತು., 16 ಜನ ಈರುಳ್ಳಿ ಬೆಳೆಗಾರರಿಗೆ ಈರುಳ್ಳಿ ಶೇಖರಣಾ ಘಟಕ ಮಂಜೂರಾತಿ ಪತ್ರ ನೀಡಲಾಯಿತು.ಅಲ್ಲದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗರ್ಭಿಣಿಯರಿಗೆ ವೇದಿಕೆಯಲ್ಲಿಯೇ ಸೀಮಂತ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಲೀಲಾ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ತಹಸಿಲ್ದಾರ್ ಸಂತೋಷ್‍ಕುಮಾರ್, ತಾ.ಪಂ ಇ.ಒ ನರಸಿಂಹಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರುಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಉದ್ಘಾಟನೆಗೂ ಮುನ್ನ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ನೇತೃತ್ವದ ಅಧಿಕಾರಿಗಳ ತಂಡಕ್ಕೆ ಗ್ರಾಮದಲ್ಲಿ 101 ಪೂರ್ಣಕುಂಭ ಹೊತ್ತ ಮಹಿಳೆಯರು, ಕಹಳೆ ವಾದನ, ಡೊಳ್ಳುವಾದನದ ಸಹಿತ ವೈಭವದ ಸ್ವಾಗತ ಕೋರಿದರು, ಅಲ್ಲದೆ ಎತ್ತಿನಗಾಡಿಯಲ್ಲಿ ಅಧಿಕಾರಿಗಳ ಮೆರವಣಿಗೆ ಸಾಗಿಬಂದಿತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಬಳಿಕ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಗ್ರಾಮದ ವಿವಿಧೆಡೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಿದರು.

ಗ್ರಾಮದ ಸುನಂದಮ್ಮ, ಲಲಿತಮ್ಮ, ಮಾರಕ್ಕ ಎಂಬುವವರ ಮನೆಗೆ ಭೇಟಿ ನೀಡಿ, ಸರ್ಕಾರದ ಸೌಲಭ್ಯಗಳಾದ ಪಡಿತರ, ವೃದ್ಧಾಪ್ಯ ವೇತನ, ಕುಡಿಯುವ ನೀರು, ವಿಧವಾ ವೇತನ ಕುರಿತು ಮಾಹಿತಿ ಪಡೆದರು, ಸ್ಥಳದಲ್ಲೆಯಿದ್ದ ಗ್ರಾಮ ಲೆಕ್ಕಾಧಿಕಾರಿಗೆ ಇದುವರೆಗೂ ಸೌಲಭ್ಯ ಪಡೆಯದ ಅರ್ಹರನ್ನು ಗುರುತಿಸಿ ಕಂದಾಯ ಇಲಾಖೆಯ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಗ್ರಾಮದ ಮತ್ತೋರ್ವ ನಿವಾಸಿ ಅನಸೂಯಮ್ಮ ಅವರ ಮನೆಗೆ ಭೇಟಿ ನೀಡಿ, ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ಸೇರಿ ಪ್ರತಿದಿನ ರೂ. 309 ಕೂಲಿ ಪಡೆದು ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದು ಜಿಲ್ಲಾ ಪಂಚಾಯಿತ್ ಸಿಇಒ ಸಲಹೆ ನೀಡಿದರು.

ಗ್ರಾಮದ ಪರಿಶಿಷ್ಟರ ಕಾಲೋನಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಲೋನಿಯಲ್ಲಿರುವ ಅಂಬೇಡ್ಕರ್ ಸಮುದಾಯ ಭವನ ಶಿಥಲಗೊಂಡಿದ್ದು ನೂತನ ಸಮುದಾಯ ಭವನ ನಿರ್ಮಿಸಿ ಕೊಡುವಂತೆ ಕಾಲೋನಿಯ ಮುಖಂಡರು ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಹಳೆಯ ಸಮುದಾಯ ಭವನವನ್ನು ದುರಸ್ತಿಗೊಳಿಸಲಾಗುವುದು. ಅಗತ್ಯವಿದ್ದರೆ ಶಾಸಕರೊಂದಿಗೆ ಚರ್ಚಿಸಿ ನೂತನ ಸಮುದಾಯ ಭವನ ನಿರ್ಮಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending