Connect with us

ದಿನದ ಸುದ್ದಿ

ಜನಸ್ಪಂದನ ಸಭೆ ಅಧಿಕಾರಿಗಳು ಸಾರ್ವಜನಿಕ ಮನವಿಗಳಿಗೆ ತ್ವರಿತವಾಗಿ ಸ್ಪಂದಿಸಬೇಕು : ಡಿಸಿ ಮಹಾಂತೇಶ್ ಬೀಳಗಿ

Published

on

ಸುದ್ದಿದಿನ,ದಾವಣಗೆರೆ : ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಹರಿಸುವ ಸಲುವಾಗಿ ಜನಸ್ಪಂದನಾ ಸಭೆ ನಡೆಸಲಾಗುತ್ತಿದ್ದು, ಅಧಿಕಾರಿಗಳು ವಿಳಂಬಕ್ಕೆ ಅವಕಾಶ ನೀಡದೆ ಸಾರ್ವಜನಿಕ ಮನವಿಗಳಿಗೆ ತ್ವರಿತವಾಗಿ ಸ್ಪಂದಿಸುವ ಮೂಲಕ ಸಮಸ್ಯೆ ಪರಿಹರಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಸೂಚನೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆಸಿದ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಅವಹಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

ಜನಸ್ಪಂದನ ಸಭೆಯ ಮೂಲಕ ಅನೇಕ ಸಮಸ್ಯೆಗಳು ಸ್ಥಳದಲ್ಲಿಯೇ ಇತ್ಯರ್ಥವಾಗುತ್ತವೆ ಅಲ್ಲದೆ ಅಧಿಕಾರಿಗಳ ಕಾರ್ಯವೈಖರಿಯೂ ತಿಳಿಯುತ್ತದೆ. ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಉದ್ದೇಶದಿಂದ ಜನಸ್ಪಂದನಾ ಸಭೆಯನ್ನು ಪುನರಾರಂಭಿಸಲಾಗಿದೆ ಎಂದರು.

ಜಗಳೂರು ತಾಲ್ಲೂಕಿನ ಗಡಿ ಭಾಗದ ಚಿಕ್ಕ ಮಂಗನಹೊಳೆ ಗ್ರಾಮದ ವ್ಯಕ್ತಿಯೊಬ್ಬರು ಗ್ರಾಮದಲ್ಲಿ ಸುಮಾರು 200ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದು, ನ್ಯಾಯ ಬೆಲೆ ಅಂಗಡಿ ಹೊರತು ಪಡಿಸಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ, ಬಸ್ ತಂಗುದಾಣ, ಗ್ರಂಥಾಲಯ, ಸಮುದಾಯ ಭವನ, ಚೆಕ್ ಡ್ಯಾಂ ರಿಪೇರಿ, ಬ್ಯಾಂಕ್ ಶಾಖೆ ಸೇರಿದಂತೆ ಅಗತ್ಯವಾದ ಸೌಲಭ್ಯಗಳನ್ನು ಗ್ರಾಮಕ್ಕೆ ಒದಗಿಸುವಂತೆ ಕೋರಿ ಸಲ್ಲಿಸಿದ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಗಳು, ಗ್ರಾಮಕ್ಕೆ ತಾವೇ ಖುದ್ದಾಗಿ ಭೇಟಿ ನೀಡಿ, ಪರಿಶೀಲನೆ ನಡೆಸಲಾಗುವುದು. ಗ್ರಾಮಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯ ಒದಗಿಸಲು ಅಗತ್ಯ ಕ್ರಮ ಜರುಗಿಸುವ ಭರವಸೆ ನೀಡಿದರು.

ಕರೆಕಟ್ಟೆ ಗ್ರಾಮದ ವೃದ್ದ ವ್ಯಕ್ತಿಯೊಬ್ಬರು ಭತ್ತದ ಅಂಗಡಿ ಮಾಲೀಕನೊಬ್ಬ ಭತ್ತ ಖರೀದಿಸಿ ಹಣ ನೀಡದೆ ಮೋಸ ಮಾಡಿದ್ದು, ನ್ಯಾಯ ದೊರಕಿಸುವಂತೆ ಮನವಿ ಮಾಡಿದರು. ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಜೊತೆಗೆ ಚರ್ಚಿಸಿ, ನ್ಯಾಯ ದೊರಕಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಚನ್ನಗಿರಿ ತಾಲ್ಲೂಕಿನ ಸೋಮಲಾಪುರ ಗ್ರಾಮಕ್ಕೆ ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಕಲ್ಪಿಸುವಂತೆ ಗ್ರಾಮದ ಮುಖಂಡರೊರ್ವರು ಮಾಡಿದ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಕೂಡಲೆ ಸೋಮಲಾಪುರ ಗ್ರಾಮಕ್ಕೆ ಕೆಎಸ್‍ಆರ್‍ಟಿಸಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕೆಎಸ್‍ಆರ್‍ಟಿಸಿ ದಾವಣಗೆರೆ ವಿಭಾಗದ ಮುಖ್ಯಸ್ಥರಿಗೆ ಸೂಚಿಸಿದರು.

ಶಿರಮಗೊಂಡನಹಳ್ಳಿ ಗ್ರಾಮದ ರವೀಂದ್ರನಾಥ್ ಬಡಾವಣೆಯ ನಿವಾಸಿಯೋರ್ವರು ಮನವಿ ಮಾಡಿ ಬಡಾವಣೆಯಲ್ಲಿ ರಸ್ತೆಗಳು, ಪಾರ್ಕುಗಳು ಹಾಳಾಗಿದ್ದು ಅಭಿವೃದ್ಧಿ ಮಾಡುವಂತೆ ಮನವಿ ಮಾಡಿದರು. ಬಡಾವಣೆಯ ಸಮಸ್ಯೆಗಳನ್ನು ಸರ್ಕಾರ ಬಿಡುಗಡೆ ಮಾಡುವ ಅನುದಾನಕ್ಕೆ ಅನುಗುಣವಾಗಿ ಹಂತ ಹಂತವಾಗಿ ಅನುದಾನ ಒದಗಿಸಿ ಅಭಿವೃದ್ಧಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

ಹರಿಹರದ ವಿದ್ಯಾರ್ಥಿಯೊಬ್ಬರು ಲ್ಯಾಪ್‍ಟಾಪ್ ಒದಗಿಸುವಂತೆ ಮನವಿ ಮಾಡಿದರು. ಜಿಲ್ಲಾಧಿಕಾರಿಗಳು ತಕ್ಷಣ ಪ್ರತಿಕ್ರಿಯಿಸಿ, ಸರ್ಕಾರದ ಯೋಜನೆಯಡಿ ನಗರಸಭೆ ವತಿಯಿಂದ ನೀಡಲಾಗುವ ಸೌಲಭ್ಯದಡಿ ಲ್ಯಾಪ್‍ಟಾಪ್ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಡಿಯುಡಿಸಿ ಯೋಜನಾಧಿಕಾರಿಗೆ ಸೂಚನೆ ನೀಡಿದರು.

ಹೂವಿನಮಡು ಗ್ರಾಮದಲ್ಲಿ ಚೌಡೇಶ್ವರಿ ದೇವಸ್ಥಾನದ ಕಟ್ಟಡ ತೆರವುಗೊಳಿಸಿ, ಜಾಗವನ್ನು ಒತ್ತುವರಿ ಮಾಡಿಕೊಂಡು ಅಡಿಕೆ ತೋಟ ನಿರ್ಮಾಣ ಮಾಡಿಕೊಳ್ಳಲಾಗಿದೆ, ಆದರೆ ಸ್ಥಳವು ದೇವಸ್ಥಾನಕ್ಕೆ ಸೇರಿದ್ದು ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಮನವಿ ಮಾಡಿಕೊಂಡರು. ತಹಸಿಲ್ದಾರ್ ಅವರು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಒತ್ತುವರಿಯಾಗಿದ್ದಲ್ಲಿ ಪೊಲೀಸ್ ನೆರವು ಪಡೆದು ತೆರವುಗೊಳಿಸುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿದೇರ್ಶಕ ವಿಜಯ್‍ಕುಮಾರ ಅವರು ಜಿಲ್ಲಾಡಳಿತ ಭವನದಲ್ಲಿ ಶಿಶುಪಾಲನಾ ಕೇಂದ್ರ ತೆರೆಯಲು ಕೊಠಡಿ ಒದಗಿಸುವಂತೆ ಮನವಿ ಮಾಡಿದರು. ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಭವನದಲ್ಲಿ ಶಿಶುಪಾಲನಾ ಕೇಂದ್ರ ತೆರೆಯುವುದು ಒಳ್ಳೆಯ ಕಾರ್ಯವಾಗಿದೆ, ಶೀಘ್ರ ಕೊಠಡಿ ಒದಗಿಸಲಾಗುವುದು ಎಂದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿ, ಬಸ್ ವ್ಯವಸ್ಥೆ, ಪಹಣಿ, ಜಾತಿ ಪ್ರಮಾಣ ಪತ್ರ ಒದಗಿಸುವುದು ಸೇರಿದಂತೆ ಸಾರ್ವಜನಿಕರಿಂದ ಅನೇಕ ಅಹವಾಲುಗಳನ್ನು ಸ್ವೀಕರಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚನ್ನಪ್ಪ, ಡಿಯುಡಿಸಿ ಯೋಜನಾಧಿಕಾರಿ ನಜ್ಮಾ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಪಿ ಮುದ್ದಜ್ಜಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸಿಲ್ದಾರರು, ಸಾರ್ವಜನಿಕರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending