ದಿನದ ಸುದ್ದಿ
ಕಲ್ಯಾಣಕರ್ನಾಟಕ ಜಿಲ್ಲೆಗಳಲ್ಲಿ ಮೂಲಸೌಕರ್ಯಾಭಿವೃದ್ಧಿಗೆ ಆದ್ಯತೆ : ಸಿಎಂ ಸಿದ್ದರಾಮಯ್ಯ ಸೂಚನೆ
ಸುದ್ದಿದಿನಡೆಸ್ಕ್: ಕಲ್ಯಾಣ ಕರ್ನಾಟಕ ಪ್ರದೇಶ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಅತ್ಯಂತ ಹಿಂದುಳಿದಿದ್ದು, ಈ ಜಿಲ್ಲೆಗಳ ಸುಧಾರಣೆಗೆ ಆದ್ಯತೆ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಅಭಿವೃದ್ಧಿಯಲ್ಲಿ ಹಿನ್ನಡೆಯಾಗಿರುವ ಕ್ಷೇತ್ರಗಳಿಗೆ ಹೆಚ್ಚು ಗಮನಹರಿಸಬೇಕು. ಹಾಸ್ಟಲ್‌ಗಳು, ಅಂಗನವಾಡಿ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯಾಭಿವೃದ್ಧಿಗೆ ಒತ್ತು ನೀಡಬೇಕು ಎಂದು ಅವರು ಹೇಳಿದರು.
ಲಭ್ಯ ಅನುದಾನವನ್ನು ಆದ್ಯತೆ ಮೇರೆಗೆ ಬಳಸಿಕೊಂಡು ರಸ್ತೆ, ಕುಡಿಯುವ ನೀರು, ನೀರಾವರಿ ಮೊದಲಾದ ಮೂಲಸೌಕರ್ಯಗಳಿಗೆ ಬಳಸಬೇಕು. ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳ ಸ್ಥಾಪನೆಗೆ ಆಡಳಿತ ಇಲಾಖೆಗಳು ಮಂಜೂರಾತಿ ನೀಡಬೇಕು. ಸಿಎಸ್‌ಆರ್ ಅಡಿ ಕಲ್ಯಾಣ ಕರ್ನಾಟಕದ ಭಾಗದ ಶಾಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಹೇಳಿದರು.
ಗುಲಬರ್ಗ ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿ ಕೊರತೆ ನಿವಾರಿಸಲು ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶಿಸಿದರು.
ಸಚಿವ ಈಶ್ವರ್ ಖಂಡ್ರೆ
ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಬೇಕಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ನಡೆದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ವಲಯದ ಯುವ ಜನರು ಖಾಸಗೀ ವಲಯದಲ್ಲಿ ಉದ್ಯೋಗಗಳಿಗೆ ಅರ್ಹರಾಗುವಂತೆ ಮಾಡಬೇಕಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಒಂದು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸಬೇಕು ಎಂದು ಮನವಿ ಮಾಡಿದರು.
ಕಲ್ಯಾಣ ಕರ್ನಾಟಕಕ್ಕೆ 371-ಜೆ ಸಾಂವಿಧಾನಿಕ ತಿದ್ದುಪಡಿ ಅಡಿಯಲ್ಲಿ ವಿಶೇಷ ಸ್ಥಾನಮಾನವಿದ್ದರೂ ಸಹ ಖಾಲಿ ಇರುವ ಹುದ್ದೆಗಳ ನೇಮಕಾತಿಯಲ್ಲಿ ಇಲಾಖೆಗಳ ಪೂರ್ವಾನುಮೋದನೆಗಾಗಿ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಬೇಕು ಎಂದು ಅವರು ಮನವಿ ಮಾಡಿದರು.
ಬೀದರ್ ವಿಮಾನ ನಿಲ್ದಾಣವನ್ನು 6 ತಿಂಗಳಿಂದ ಮುಚ್ಚಲಾಗಿದೆ. ಉಡಾನ್ ಯೋಜನೆಯಡಿ ಸಬ್ಸಿಡಿ ದೊರೆಯದಿರುವುದೇ ಇದಕ್ಕೆ ಕಾರಣ. ಬೀದರ್ ವಿಮಾನ ನಿಲ್ದಾಣದ ಪುನರ್ ಆರಂಭಕ್ಕೆ ಕ್ರಮಕೈಗೊಳ್ಳಬೇಕು ಎಂದು ಈಶ್ವರ್ ಖಂಡ್ರೆ ಮನವಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243