ಅಂತರಂಗ
ಅರಿಮೆಯ ಅರಿವಿರಲಿ-35 : ಕ್ರೌರ್ಯದ ರೋಗ
- ಯೋಗೇಶ್ ಮಾಸ್ಟರ್
ಹಿಂಸೆ ಎಂಬುವ ರೋಗಲಕ್ಷಣವನ್ನು ಸಮಾಜದಲ್ಲಿ ಕಾಣುತ್ತಿದ್ದಂತೆ ಅದನ್ನು ಗುಣಪಡಿಸಬೇಕೆಂದರೆ ಮಕ್ಕಳ ಪೋಷಣೆಯ ಕಡೆಗೆ ಗಮನ ಕೊಡಬೇಕು.
ಬಾಲ್ಯದ ಅನುಭವಗಳು ಮತ್ತು ಪ್ರಭಾವಗಳ ಆಧಾರದಲ್ಲಿ ವಯಸ್ಕನೊಬ್ಬನ ಸಾಮಾಜಿಕ ಮತ್ತು ಭಾವನಾತ್ಮಕ ನಡವಳಿಕೆಗಳ ಆರೋಗ್ಯವನ್ನು ನಿರ್ಧರಿಸಬಹುದು. ಅಪರಾಧ ಚಟುವಟಿಕೆಗಳನ್ನು ಯಾರೂ ವೃತ್ತಿಯನ್ನಾಗಿ ಆಯ್ದುಕೊಳ್ಳದಿದ್ದರೂ ಅಪರಾಧಗಳಲ್ಲಿ ವೃತ್ತಿಪರರಾಗುವರು. ಅದು ಯಾವುದೋ ಒಂದು ಸಂದರ್ಭದಲ್ಲಿ ದೊಡ್ಡ ನೆಗೆತವಾಗಿ ವಯಸ್ಕನ ಜೀವನದಲ್ಲಿ ಪರಿಣಮಿಸುತ್ತದೆ.
ಮಗುವು ಹುಟ್ಟಿದಾಗಿನಿಂದ ಬೆಳೆಯುವಲ್ಲಿ ಅದು ಅನುಭವಿಸುವ ಕಹಿ ಅನುಭವಗಳ ಮೊತ್ತ ಅವನನ್ನು ಅಪರಾಧಿಯನ್ನಾಗಿ ರೂಪಿಸುತ್ತದೆ.ಯಾವ ಮಗುವಿಗೆ ಸಾಮಾಜಿಕ ಮತ್ತು ಭಾವನಾತ್ಮಕವಾದಂತಹ ಅನುಭವಗಳು ನಕಾರಾತ್ಮಕವಾಗಿರುತ್ತದೆಯೋ ಅಂತಹ ಮಕ್ಕಳು ಒಂದೋ ಖಿನ್ನತೆಯೇ ಮೊದಲಾದ ನಿಷ್ಕೃಷ್ಟ ಭಾವದಲ್ಲಿ ಕೀಳರಿಮೆಯ ವ್ಯಕ್ತಿತ್ವವುಳ್ಳವರಾಗುತ್ತಾರೆ ಅಥವಾ ಖತರ್ನಾಕ್ ರೌಡಿ, ಅಪರಾಧಿ ಚಟುವಟಿಕೆಗಳಲ್ಲಿ ನುರಿತರಾಗುತ್ತಾರೆ.
ವಿದ್ಯಾವಂತ ಕುಟುಂಬದ ಮನೆಯಲ್ಲಿ ಎಲ್ಲಾ ಸೌಕರ್ಯಗಳಿದ್ದರೂ ಕೂಡಾ ಮಕ್ಕಳಿಗೆ ಒಂದಲ್ಲ ಒಂದು ಒತ್ತಡಗಳಿರುತ್ತವೆ. ಶಾಲೆ, ಕರಾಟೆ ಕ್ಲಾಸ್, ಆ ಈ ತರಗತಿಗಳು, ಪ್ರಾಜೆಕ್ಟ್ಗಳು, ಹೋಂವರ್ಕ್ಗಳು, ಒಡಹುಟ್ಟುಗಳೊಡನೆ, ಸಹಪಾಠಿಗಳೊಡನೆ ಸಂಘರ್ಷಗಳು. ಅನೇಕ ಕಾರಣಗಳಿಗೆ ಶಾಲೆಯ ಅಥವಾ ಮನೆಯ ಹಿರಿಯರೊಡನೆ ಮನಸ್ತಾಪ. ಈಡೇರದ ಆಸೆಗಳು, ಸಣ್ಣಪುಟ್ಟ ತಗಾದೆಗಳು; ಹೀಗೇ ಒಂದಲ್ಲಾ ಒಂದು ನವಿರಾದದ್ದೋ, ಗಾಢವಾದದ್ದೋ ಒಟ್ಟಾರೆ ಒಂದಷ್ಟು ಮಾನಸಿಕವಾಗಿ ಪ್ಯಾಕ್ಡ್ ಚಟುವಟಿಗೆಗಳಿರುತ್ತವೆ. ಅದನ್ನೇ ಒತ್ತಡ ಎನ್ನುವುದು.
ಇನ್ನು ವಿದ್ಯಾವಂತರಲ್ಲದ ಕುಟುಂಬದ ಸದಸ್ಯರು, ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿಲ್ಲದ ಮತ್ತು ಸಾಮಾಜಿಕವಾಗಿ ಒಳ್ಳೆಯ ಪರಿಸ್ಥಿತಿಯಿರದಂತಹ, ಯಾವುದ್ಯಾವುದೋ ಸೌಕರ್ಯ ಮತ್ತು ಸೌಲಭ್ಯಗಳಿಲ್ಲದೆ ಪರದಾಡುವ, ಒಳ್ಳೆಯ ಬಟ್ಟೆಗಳಿಲ್ಲದ, ಸರಿಯಾದ ಆಹಾರ ಮತ್ತು ಶರೀರ ಪೋಷಣೆಗೆ ಅವಕಾಶವಿರದ, ಅಚ್ಚುಕಟ್ಟಾದ ಶಾಲೆಗೆ ಹೋಗಲಾಗದ, ಬಯಸಿದ್ದನ್ನು ಪಡೆಯಲಾರದ, ಚಾಕೊಲೆಟ್, ಐಸ್ ಕ್ರೀಮ್ ಬೇಕೆಂದಾಗ ಸಿಗದ ಮಕ್ಕಳಿಗೆ ಇನ್ನೆಷ್ಟು ಮಾನಸಿಕ ಒತ್ತಡಗಳಿರುತ್ತವೆ ಎಂಬುದನ್ನು ಆಲೋಚಿಸಬೇಕು.
ಇಂತಹ ಮಕ್ಕಳಿಗೆ ಅವರ ತಂದೆ ತಾಯಿಗಳು ಯಶಸ್ವೀ ಪೋಷಕರಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸಲು ಆಗದು. ಆರ್ಥಿಕ ಮತ್ತು ಸಾಮಾಜಿಕ ಒತ್ತಡಗಳ ಜೊತೆಗೆ ಭಾವನಾತ್ಮಕವಾಗಿಯೂ ಅವರು ಮಗು ಮತ್ತು ಕುಟುಂಬವು ಒತ್ತಡದಲ್ಲಿರುವುದು. ಇಂತಹ ಮಕ್ಕಳಿಗೆ ಬರಿಯ ಪೌಷ್ಟಿಕಾಂಶಗಳದ್ದು ಕೊರತೆ ಮಾತ್ರವೇ ಅಲ್ಲ, ಸಾಮಾಜಿಕವಾಗಿ ಸಂವೇದನೆ ಮತ್ತು ಭಾವನಾತ್ಮಕ ಪೋಷಣೆಯ ಕೊರತೆಯೂ ಕೂಡಾ ಉಂಟಾಗುವುದು.
ಒಡಕು ಕುಟುಂಬಗಳ ಪ್ರಭಾವಗಳು
ಇನ್ನು ಉಳ್ಳವರಾದರೂ, ಬಡವರಾದರೂ ಒಡಕು ಕುಟುಂಬಗಳು, ಸದಾ ಜಗಳ, ಕದನ, ನಿಂದನೆ, ವ್ಯಾಜ್ಯಗಳಿರುವಂತಹ ಕುಟುಂಬಗಳಾದರೆ ಇನ್ನೂ ಅತಿ ಹೆಚ್ಚಿನ ಒತ್ತಡಗಳಿಗೆ ಮಕ್ಕಳು ಸಿಕ್ಕುವುದಲ್ಲದೇ ಅವರ ಭಾವನೆಗಳಿಗೆ ಅಥವಾ ಮನಸ್ಸಿನ ಭಾವನಾತ್ಮಕ ಸ್ತರಗಳಿಗೆ ತೀರಾ ಘಾಸಿಯಾಗುತ್ತದೆ.ಘಾಸಿಯಾಗಿರುವ ಮನಸ್ಸು ಸಂತೋಷ ನೀಡುವಂತಹ ಕೆಲಸಗಳನ್ನು ಮಾಡಲು ಪ್ರೇರೇಪಣೆಗಳು ಎಲ್ಲಿಂದ ಪಡೆಯಬೇಕು? ಮನೆಗಳಲ್ಲಿ ತೊಂದರೆ ಅಥವಾ ಒತ್ತಡ ಅನುಭವಿಸುವ ಅವರಿಗೆ ಶಾಲೆಗಳಲ್ಲೋ, ಇನ್ನಿತರ ಸಾಮಾಜಿಕ ಪರಿಸರದಲ್ಲೋ ಸಾಂತ್ವಾನ ಸಿಗಬೇಕು. ಚೇತೋಹಾರಿ ವಾತಾವರಣ ಸೃಷ್ಟಿಯಾಗಬೇಕು.
ಸಹವಾಸಗಳು ಸಾತ್ವಿಕವಾಗಿದ್ದು ಅಥವಾ ಭಿನ್ನ ನೆಲೆಗಟ್ಟಿನ ಮತ್ತು ಭಿನ್ನ ಸಂಸ್ಕಾರದ ಕುಟುಂಬಗಳ ಹಿನ್ನೆಲೆಯವದಾಗಿದ್ದರೆ ಒಂದಿಷ್ಟು ಬೇರೆಯ ರೀತಿಯ ಜೀವನ ಶೈಲಿಯ ಉದಾಹರಣೆಗಳು ಸಿಗುತ್ತವೆ. ಹಾಗೂ, ಉತ್ತಮತೆಗೆ ಒಂದಿಷ್ಟು ಮಾದರಿಗಳು, ಹಿತದ ಅನುಭವಗಳು ಆಗಬಹುದು. ಆದರೆ, ಅದೇ ಬಗೆಯ ಜನರು, ಅದೇ ಬಗೆಯ ಪರಿಸರದವರ ಮತ್ತು ಹಿನ್ನೆಲೆಯವರ ಒಡನಾಟಗಳು ಮಕ್ಕಳ ಮನಸ್ಸಿನ ಒತ್ತಡವನ್ನು ಮತ್ತಷ್ಟು ಗಾಢಗೊಳಿಸುತ್ತದೆ. ಫಲವಾಗಿ ನಕಾರಾತ್ಮಕ ಧೋರಣೆ ಮತ್ತು ಚಟುವಟಿಕೆಗಳಿಗೆ ಪ್ರೇರಣೆಯಾಗುತ್ತದೆ.
ಸಾಮಾಜಿಕ ಸಂಸ್ಥೆಗಳ ಪಾತ್ರ
ಸಾಮಾಜಿಕ ಸಂಸ್ಥೆಗಳು ಮತ್ತು ಸರ್ಕಾರದ ಅಂಗಸಂಸ್ಥೆಗಳು ಇಂತಹ ವಿಷಯಗಳಿಗೆ ಗಮನ ನೀಡಬೇಕು ಮತ್ತು ಅವರಿಗೆ ಕ್ರಿಯಾಶೀಲವಾದ, ಶೈಕ್ಷಣಿಕವಾದ, ಸೃಜನಾತ್ಮಕವಾದ ಹಾಗೂ ಅವರ ಪ್ರತಿಭೆಗಳಿಗೆ ಅವಕಾಶ ನೀಡುವಂತಹ ಪರಿಸರವನ್ನು ಒದಗಿಸುವಂತಹ ಯೋಜನೆಗಳನ್ನು ಮತ್ತು ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು. ತಮ್ಮ ಕುಟುಂಬ ಮತ್ತು ತಾವು ಬೆಳೆಯುತ್ತಿರುವಂತಹ ಪರಿಸರದ ಗಾಯಗಳಿಗೆ ಸಾಂತ್ವಾನ ನೀಡುವಂತಹ ಸಮಾಜೋಭಾವುಕ ಚಟುವಟಿಕೆಗಳಲ್ಲಿ ಅವರು ತೊಡಗಬೇಕು. ಅನೇಕ ಸ್ವಯಂಸೇವಕ ಸಂಘಗಳು ಇಂಥಾ ಮಕ್ಕಳಿಗೆ ಸಾತ್ವಿಕ ಪರಿಸರವನ್ನು ಒದಗಿಸುವಂತಹ ಚಟುವಟಿಕೆಗಳನ್ನು ನೀಡುವ ದಿಕ್ಕಿನಲ್ಲಿ ಕೆಲಸ ಮಾಡುತ್ತಿವೆ.
ಆದರೆ ಇರುವ ಬಹುದೊಡ್ಡ ಗಾತ್ರದ ಮಕ್ಕಳಿಗೆ ಈ ಚಟುವಟಿಕೆಗಳು ಸಾಕಾಗುತ್ತಿಲ್ಲ. ಎಲ್ಲರನ್ನೂ ಒಳಗೊಳ್ಳುವಂತಹ ಕೆಲಸ ಪ್ರಾಯೋಗಿಕವಾಗಿ ಸಾಧ್ಯವಾಗುತ್ತಿಲ್ಲ. ಈ ವಿಷಯದಲ್ಲಿ ಸಮಾಜದಲ್ಲಿರುವ ಪ್ರತಿಯೊಂದು ಸಂಸ್ಥೆಗೂ, ವ್ಯವಸ್ಥೆಗೂ ಹಾಗೂ ವ್ಯಕ್ತಿಗೂ ಅವರವರದೇ ಆದಂತಹ ಪಾತ್ರವಿದೆ. ಸಮುದಾಯದ ನಾಯಕರು ಮತ್ತು ಸರಕಾರದಲ್ಲಿ ನೀತಿಗಳನ್ನು ರೂಪಿಸುವವರು ಇಂತಹ ಮಕ್ಕಳಿಗೆ ಬೆಂಬಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲೇ ಬೇಕು. ಏಕೆಂದರೆ ಮಗುವು ಮಗುವಾಗಿಯೇ ಬಹಳ ಕಾಲ ಉಳಿದಿರುವುದಿಲ್ಲ.
ಸೌಕರ್ಯಹೀನ ಮಕ್ಕಳಿಗೆ ಸೌಜನ್ಯದ ನೆಲೆಗಳು ಒದಗಿ ಅವರಿಗೆ ಸಮಾಜೋಭಾಂದವ್ಯದ ಅನುಭವವಾಗದಿದ್ದರೆ ಸಮಾಜವು ಹಿಂಸೆ, ಕ್ರೌರ್ಯಗಳು ತುಂಬಿರುವಂತಹ ಅಪರಾಧಿಗಳನ್ನು ಗುಂಪುಗುಂಪಾಗಿ ನೋಡುತ್ತದೆ. ಸೌಜನ್ಯ ಮತ್ತು ಸಾಂತ್ವಾನದ ಈ ಶಿಬಿರಗಳು, ಕಾರ್ಯಕ್ರಮಗಳು ಅಥವಾ ನೆಲೆಗಳು ತಾಂತ್ರಿಕವಾಗಿ ಸಹಜವಾಗಿರಬೇಕು. ಆದರ್ಶಗಳನ್ನು ಬೋಧನೆ ಮಾಡುವಂತಹ, ಮೌಲ್ಯ ಉದಾತ್ತತೆ ಇತ್ಯಾದಿಗಳ ಭಾಷಣಗಳು ಮತ್ತು ಪ್ರವಚನಗಳನ್ನು ಒಳಗೊಂಡಿರಬಾರದು. ಭಜನೆ, ಧ್ಯಾನ, ಇನ್ನೆಂತದ್ದೋ ಧಾರ್ಮಿಕತೆಗಳ ಆಚರಣೆಗಳಾವುವೂ ಇರಕೂಡದು.
ಕುಶಿಕುಶಿಯಾಗಿ, ಒಳ್ಳೊಳ್ಳೆಯ ಮಾತುಗಳಿಂದ, ಹಾಸ್ಯ ಚಟಾಕಿಗಳನ್ನು ಹಾರಿಸಿಕೊಂಡು ಒಟ್ಟೊಟ್ಟಿಗೆ ಆಡುವ, ಹಾಡುವ, ಕುಣಿಯುವ ಅಥವಾ ಒಳ್ಳೊಳ್ಳೆಯ ಸಿನಿಮಾಗಳನ್ನು ನೋಡುವಂತಹ ಕಾರ್ಯಕ್ರಮಗಳಾಗಿರಬೇಕು. ಸಂತೋಷ ಕೊಡುವ ಆಟಗಳು, ನಕ್ಕು ನಲಿಸುವ ನೋಟಗಳು ಪ್ರಧಾನವಾಗಿರಬೇಕು. ಒಟ್ಟೊಟ್ಟಿಗೆ ಊಟ ಮಾಡುವ, ಪುಸ್ತಕಗಳನ್ನು ಓದುವ, ಓದಿದ್ದನ್ನು ಹೇಳಿ ವಿಷಯಗಳನ್ನು ಹಂಚಿಕೊಳ್ಳುವ ಅನುಭವಗಳು ಅಲ್ಲಿರಬೇಕು. ಚಿತ್ರ ಬಿಡಿಸುವುದು, ಕರಕುಶಲ ವಸ್ತುಗಳನ್ನು ಮಾಡುವುದು ಇತ್ಯಾದಿಗಳು ಮಕ್ಕಳ ಮನಸ್ಸನ್ನು ಮತ್ತಷ್ಟು ಸ್ವಾಸ್ಥಗೊಳಿಸುತ್ತವೆ. ಅವರಿಗೆ ರಂಗಭೂಮಿಯ ಚಟುವಟಿಕೆಗಳು, ಕುಂಬಾರಿಕೆ, ಮರಗೆಲಸ, ಕಂಪ್ಯೂಟರಿನಲ್ಲಿ ಸೃಜನಶೀಲವಾಗಿ ಏನಾದರೂ ಮಾಡುವುದೂ ಕೂಡಾ ಒಳ್ಳೆಯದೇ.
ಆರ್ಥಿಕವಾಗಿ ಮತ್ತು ಸಂಬಂಧಗಳ ವಿಷಯದಲ್ಲಿ ಮುರುಕು ಮತ್ತು ಒಡಕು ಕಂಡಿರುವ ಕುಟುಂಬಗಳ ಮಕ್ಕಳನ್ನು ಅವರ ಮಾನಸಿಕ ಒತ್ತಡದಿಂದ ಮುಕ್ತಗೊಳಿಸುವ ಕೆಲಸವನ್ನು ತುರ್ತಾಗಿ ಮಾಡುವುದರಿಂದ ಮುಂದಿನ ಗುಂಪು ಘರ್ಷಣೆಗಳಲ್ಲಿ ತೊಡಗುವ ಅಪರಾಧಿಗಳ ಸಂಖ್ಯೆಯನ್ನು ಗಮನೀಯವಾಗಿ ಕಡಿಮೆ ಮಾಡಬಹುದು ಅಥವಾ ಇಲ್ಲವಾಗಿಸಬಹುದು.
ಆ ಮಕ್ಕಳ ಕುಟುಂಬಗಳನ್ನೂ ಕೂಡಾ ಒಳಗೊಳ್ಳುವ ಕಾರ್ಯಕ್ರಮಗಳೂ ಕೂಡ ಒಳಿತೇ. ಅವರ ಮಕ್ಕಳ ದೆಸೆಯಿಂದ ಅವರ ಕುಟುಂಬಗಳಿಗೂ ಸಾಂತ್ವಾನ ಮತ್ತು ಸೌಜನ್ಯದ ಅನುಭವಗಳು ಸಿಗುವಂತಹ ಶಿಬಿರಗಳು ಮತ್ತು ಕಾರ್ಯಕ್ರಮಗಳು ಆಗುತ್ತಿರಬೇಕು. ಈ ಮಕ್ಕಳು ಅಪರಾಧಿಗಳಾಗುವ ಸಾಧ್ಯತೆಗಳನ್ನು ತಪ್ಪಿಸುವುದೇ ಮುಂದಿನ ಗುಂಪುಘರ್ಷಣೆಗಳನ್ನು ಕಡಿಮೆ ಮಾಡಲು ಅಥವಾ ಇಲ್ಲವಾಗಿಸಲು ಸಾಧ್ಯ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ದೇವರ ಹೂವು
~ ಡಾ. ಸಿ.ಬಿ.ಐನಳ್ಳಿ
ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ
ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ
ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ
ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ
ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ6 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ5 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ3 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ21 hours agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ


