ಅಂತರಂಗ
ಅರಿಮೆಯ ಅರಿವಿರಲಿ-42 : ದೌರ್ಬಲ್ಯವೇ ಮಹಾಬಲ
- ಯೋಗೇಶ್ ಮಾಸ್ಟರ್
ವ್ಯಕ್ತಿಗಳ ಗುಂಪು ಅಥವಾ ಸಮಾಜವು ಬೇಡದ ಸಂಗತಿಗಳನ್ನು ಚಿಂತಿಸುತ್ತಿದ್ದರೆ, ಅನಗತ್ಯವಾದುದನ್ನು ಚರ್ಚಿಸುತ್ತಿದ್ದರೆ, ಬೇಗನೆ ಕೆಲಸಕ್ಕೆ ಬಾರದವರಾಗುತ್ತಾರೆ. ಯಾವ ವ್ಯಕ್ತಿಗಳು ಅಥವಾ ಸಮೂಹವು ತನ್ನ ಈಗಿನ ಮತ್ತು ವರ್ತಮಾನದ ಮುಂದುವರಿಕೆಯ ಭಾಗವಾದ ಭವಿಷ್ಯವನ್ನು ಸಬಲಗೊಳಿಸಿಕೊಳ್ಳಲು ಅಥವಾ ವ್ಯವಸ್ಥಿತವಾಗಿ ಮುನ್ನಡೆಸಲು ವಿಚಾರ ಮಾಡುವುದಿಲ್ಲವೋ ಅವರು ಕ್ರಮೇಣ ಅನುತ್ಪಾದಕರಾಗುತೊಡಗುತ್ತಾರೆ, ರಚನಾತ್ಮಕವಾಗಿರುವುದಿಲ್ಲ.
ಏಕೆಂದರೆ ಅವರ ಒಲವು, ನಿಲುವು, ಆಸೆ, ನಿರಾಸೆ, ಸೇಡು, ದುಃಖ, ಹಟ ಇತ್ಯಾದಿಗಳೆಲ್ಲಾ ಧೋರಣೆ ಅಥವಾ ದೃಷ್ಟಿಗಳಾಗಿ ಬದಲಾಗಿರುತ್ತವೆ. ಅವು ಯಾವುದಾದರೂ ಅರಿಮೆಯ ಅಥವಾ ಮಾನಸಿಕ ಸಮಸ್ಯೆಗಳ ರೂಪದಲ್ಲಿ ಅವರ ವರ್ತನೆಗಳ, ಚಿಂತನೆಗಳ, ಪ್ರತಿಕ್ರಿಯೆಗಳ ಮತ್ತು ಕೆಲಸ ಮಾಡುವ ರೀತಿಗಳ, ಒಟ್ಟಾರೆ ವ್ಯಕ್ತಿತ್ವದ ಭಾಗವಾಗಿರುತ್ತವೆ. ಇದರ ಪರಿಣಾಮವಾಗಿ ಅವರಲ್ಲಿ ಕೋಪ, ಅಸೂಯೆ, ಅಸಹನೆ, ಆಗ್ರಹ, ದ್ವೇಷ, ಆಕ್ರೋಶ ಇತ್ಯಾದಿಗಳು ವ್ಯಕ್ತವಾಗುತ್ತಿರುತ್ತವೆ. ಇವುಗಳನ್ನು ನಾವು ಸಾಮಾನ್ಯವಾಗಿ ವ್ಯಕ್ತಿಯ ದೌರ್ಬಲ್ಯವೆನ್ನುತ್ತೀವೋ? ಅನ್ನಬಹುದು, ಅಡ್ಡಿಯಿಲ್ಲ. ಆದರೆ ಈ ದೌರ್ಬಲ್ಯವೇ ವ್ಯಕ್ತಿಯು ಉತ್ಪಾದಕನಾಗಿರದಂತೆ ತಡೆಯುವಷ್ಟು, ರಚನಾತ್ಮಕನಾಗಿ ತೊಡಗಿಕೊಳ್ಳುವುದಕ್ಕೆ ಅಡ್ಡಿ ಮಾಡುವಷ್ಟು ಸಮರ್ಥವಾಗಿರುತ್ತವೆ.
ಅಡಗಿರುವ ಭೂತಗಳ ಅಪ್ಪಣೆ
ಅರಿಮೆಗಳು ಹುಟ್ಟು ಹಾಕುವ ಧೋರಣೆಗಳನ್ನು, ಅಭಿಪ್ರಾಯಗಳನ್ನು ಮತ್ತು ನಿರ್ಣಯಗಳನ್ನು ವ್ಯಕ್ತಿಗಳು ಮೈಮರೆತವರಂತೆ ತೃಪ್ತಿಪಡಿಸಿಕೊಳ್ಳುತ್ತಿರುತ್ತಾರೆ. ತಮ್ಮ ಒಳಗೆ ಅಡಗಿರುವ ಭೂತವು ಕೊಡುತ್ತಿರುವ ತೀರ್ಮಾನಕ್ಕೆ ತಕ್ಕಂತೆ ಎಲ್ಲವನ್ನೂ ನಡೆಸಲು ಅವರು ಆಜ್ಞಾನುವರ್ತಿಗಳಾಗಿ ವರ್ತಿಸುತ್ತಿರುತ್ತಾರೆ. ಮತ್ತೊಬ್ಬ ವ್ಯಕ್ತಿಯೊಡನೆ ಹೊಂದಿರುವ ಅಥವಾ ಹೊಂದಬೇಕಾಗಿರುವ ಸಂಬಂಧ, ಇತರ ಹಕ್ಕುಗಳನ್ನು, ತನ್ನ ಕರ್ತವ್ಯಗಳನ್ನು ಮರೆಯುವಂತೆಯೂ ಅಲ್ಲಿ ಆಗುತ್ತಿರುತ್ತದೆ. ಸರಳವಾಗಿ ಹೇಳುವುದಾದರೆ ಉನ್ಮತ್ತರಾಗಿರುತ್ತಾರೆ.
ಆ ಅಮಲಿನಲ್ಲಿ ಅವರ ವಿವೇಕವು ಇಲ್ಲವಾಗಿರುತ್ತದೆ. ಪ್ರಜ್ಞೆಯು ಪ್ರಜ್ಞಾಹೀನವಾಗಿರುತ್ತದೆ. ವಿವೇಚನೆಯು ಕೆಲಸವೇ ಮಾಡುವುದಿಲ್ಲ. ತನ್ನ ಒಳಗೆ ಅರಿಮೆಗಳು ಅಥವಾ ಮನಸ್ಥಿತಿಗಳು ಸೃಷ್ಟಿಸಿರುವ ಪರಿಕಲ್ಪನೆಗಳನ್ನು ಅಥವಾ ಭ್ರಮೆಗಳನ್ನು ಅತಿಯಾಗಿ ಮೋಹಿಸುವ ಇವರು ಸದಾ ಅದರ ಬಗ್ಗೆಯೇ ಆಲೋಚನೆಗಳನ್ನು ಮಾಡುತ್ತಿರುತ್ತಾರೆ. ತಮ್ಮ ಇಷ್ಟಗಳನ್ನು ಇಷ್ಟಪಡದವರು ತನ್ನ ವಿರೋಧಿಗಳು ಎಂದು ಭಾವಿಸುತ್ತಾರೆ. ತನ್ನ ಅಭಿರುಚಿ ಮತ್ತು ಆಸಕ್ತಿಗಳನ್ನು ಹೊಂದದವರು ತನ್ನ ಇರುವಿಕೆಯ ಬೆದರಿಕೆ ಎಂದೇ ಭಾವಿಸುವಂತಿರುತ್ತದೆ.
ಹಾಗಾಗಿಯೇ ಅವರು ಆಗ್ರಹಪೂರ್ವಕವಾಗಿ ತಮ್ಮ ಇಷ್ಟ, ಆಸಕ್ತಿ, ಅಭಿರುಚಿಗಳಿಗೆ ವಿರೋಧವಾದ ಅಭಿಪ್ರಾಯ ವ್ಯಕ್ತಪಡಿಸುವವರನ್ನು ದ್ವೇಷಿಸತೊಡಗುತ್ತಾರೆ. ಇದರಿಂದ ವ್ಯಕ್ತಿ ವ್ಯಕ್ತಿಗಳು ಕೂಡಿ ರಚನಾತ್ಮಕವಾದುದನ್ನು ಮಾಡಲಾರದವರಾಗುತ್ತಾರೆ. ಉತ್ಪಾದನೆಯು ಕುಂಠಿತವಾಗುತ್ತದೆ. ಸಾಮಾಜಿಕ ಬಂಧದ ತಂತುಗಳು ದುರ್ಬಲವಾಗುತ್ತವೆ. ಇದು ವ್ಯಕ್ತಿಗಳಿಗೆ ಅರ್ಥವಾಗುವುದೇ ಇಲ್ಲ. ಏಕೆಂದರೆ ಅವರು ಆತ್ಮರತಿ ಅಥವಾ ನಾರ್ಸಿಸ್ಟ್ಗಳಂತೆ ಇಡೀ ಜಗತ್ತನ್ನು ತಮ್ಮ ಮೂಗಿನ ನೇರಕ್ಕೇ ನೋಡಿಕೊಳ್ಳುವವರಾಗಿರುತ್ತಾರೆ.
ಜೀವಂತ ಸ್ಫೋಟಕಗಳು
ಅನಾರೋಗ್ಯಕರ ಮನಸ್ಥಿತಿಯು ವ್ಯಕ್ತಿಗತವಾಗಿಯಾದರಾಗಲಿ, ಸಮಾಜದಲ್ಲಿ ಸಂಕಲಿತವಾಗಿಯಾದರಾಗಲಿ; ಉಂಟಾದರೆ, ಅವು ಕೊರಕಲುಗಳನ್ನು ನಿರಂತರವಾಗಿ ಕೊರೆಯುತ್ತಿರುತ್ತವೆ. ಇದರಿಂದ ಪರಸ್ಪರ ಗಟ್ಟಿ ಹಿಡಿಯಬೇಕಾದ ಅಂಶಗಳು ಸವೆಯಲಾರಂಭಿಸುತ್ತವೆ. ಒಂದಲ್ಲ ಒಂದು ದಿನ ಅವು ಕುಸಿಯುತ್ತವೆ. ವ್ಯಕ್ತಿಗತವಾದ ಗಂಡ ಹೆಂಡಿರ ಸಂಬಂಧಗಳಾಗಲಿ, ಪೆÇೀಷಕರ ಮತ್ತು ಮಕ್ಕಳ ನಡುವಿನ ಸಂಬಂಧ, ಕಾರ್ಯಕ್ಷೇತ್ರಗಳಲ್ಲಿ, ಸಾಮಾಜಿಕ ವ್ಯವಸ್ಥೆಯ ಅಂಗಗಳಲ್ಲಿ, ಸಮುದಾಯಗಳಲ್ಲಿ ಒಡಕು ಮೂಡುವುದು ಹೀಗೆಯೇ.
ಒಟ್ಟಾರೆ ಅರಿವಿಗೆ ಎಟುಕದ ಅರಿಮೆಯ ಮನಸ್ಥಿತಿಗಳೆಂದರೆ, ಅವು ಸ್ಫೋಟಕಗಳು. ನಮ್ಮ ಎದುರಿಗೆ ಓಡಾಡುತ್ತಿರುವ ವ್ಯಕ್ತಿಗಳು ಎಂತೆಂತಹ ಜೀವಂತ ಸ್ಫೋಟಕಗಳೋ ಯಾರು ಬಲ್ಲರು? ಗಂಡನೆಂಬ ಸ್ಫೋಟಕವೊಂದು ಹೆಂಡತಿಯೆಂಬ ಮತ್ತೊಂದು ಸ್ಫೋಟಕದ ಜೊತೆಗೆ, ಅಪ್ಪ ಎಂಬ ಸ್ಫೋಟಕವೊಂದು ಮಗನೆಂಬ ಸ್ಫೋಟಕದೊಂದಿಗೆ; ಹೀಗೆ ಒಟ್ಟೊಟ್ಟಿಗೆ ಅನಿವಾರ್ಯವಾಗಿ ವ್ಯವಹರಿಸುತ್ತಿರುತ್ತಾರೆ. ಯಾವುದೋ ಒಂದು ಸಣ್ಣದೋ ಅಥವಾ ದೊಡ್ಡದೋ; ಒಟ್ಟಾರೆ ಒಂದು ಕಿಡಿ ಒಬ್ಬರನ್ನು ಸ್ಫೋಟಗೊಳ್ಳುವಂತೆ ಮಾಡುತ್ತದೆ. ಅದೇ ಕಾರಣದಿಂದ ಮತ್ತೊಬ್ಬರು ಪ್ರತಿಸ್ಫೋಟಗೊಳ್ಳುತ್ತಾರೆ.
ಒಂದು ವ್ಯಕ್ತಿ ಮತ್ತೊಂದು ವ್ಯಕ್ತಿಯ ಬಗ್ಗೆ ಅಥವಾ ಒಂದು ಸಮುದಾಯ ಮತ್ತೊಂದು ಸಮುದಾಯದ ಬಗ್ಗೆ ತಳೆಯುವ ಅಭಿಪ್ರಾಯ, ಮಾಡುವ ಆಲೋಚನೆಗಳು ಅಭಿವ್ಯಕ್ತಗೊಳಿಸಲು ಹಾತೊರೆಯುತ್ತಿರುತ್ತದೆ. ಅದು ನಕಾರಾತ್ಮಕವಾಗಿದ್ದರೆ, ಇರಿಯಲು ಅವಕಾಶವನ್ನು ಕಾಯುತ್ತಿರುತ್ತದೆ. ಯಾವುದೋ ಒಂದು ಸಂಗತಿಯ ಸ್ಫೋಟದಲ್ಲಿ ಇರಿಯುತ್ತಾರೆ. ಆದರೆ ಆ ಸ್ಫೋಟದ ಮುನ್ನದ ಅವಧಿಯಲ್ಲಿ ಅವರು ತಮ್ಮ ಆಯುಧವನ್ನು ಮಸೆಯುತ್ತಿರುತ್ತಾರೆ. ಈ ಮಸೆಯುವಿಕೆಯ ಅವಧಿಯಲ್ಲಿ ಅವುಡುಗಚ್ಚಿರುತ್ತಾರೆ ಮತ್ತು ಕುದಿಯುತ್ತಿರುತ್ತಾರೆ.
ಇದನ್ನೇ ಬಸವಣ್ಣನವರು ‘ಮನೆಯೊಳಗಣ ಕಿಚ್ಚು’ ಎನ್ನುವುದು. ಈ ಕಿಚ್ಚು ಹೆಚ್ಚಾದಷ್ಟೂ ಹುಚ್ಚರಾಗುತ್ತಿರುತ್ತಾರೆ. ತಾವು ಉಣ್ಣುವಾಗಲೂ, ಉಡುವಾಗಲೂ, ಸ್ನಾನ ಮಾಡುವಾಗಲೂ, ತಮ್ಮ ಬದುಕಿನ ಅಗತ್ಯದ ಯಾವುದೇ ಕೆಲಸಗಳನ್ನು ಮಾಡುವಾಗಲೂ ಈ ಮಸೆಯುವಿಕೆ ಅಥವಾ ಕಿಚ್ಚು ಕ್ರಿಯಾಶೀಲವಾಗಿಯೇ ಇರುತ್ತದೆ. ಆದ್ದರಿಂದ ಉಣ್ಣುವ ಉಡುವ ಆನಂದ ಅವರಿಗೆ ಇರುವುದಿಲ್ಲ.
ತಾವು ಆನಂದವಾಗಿರಬಹುದಾದ ಸಂಗತಿಗಳಲ್ಲಿ ಆನಂದವಾಗಿರಲು ಸಾಧ್ಯವಾಗದೇ ಅವುಗಳನ್ನೂ ಕೂಡಾ ತಮ್ಮ ಪೂರ್ವನಿರ್ಧಾರಿತ ಆಲೋಚನೆಗಳ ಪ್ರಕಾರ ಅಥವಾ ತಮ್ಮ ಮುಂಚಿನ ಅನುಭವವನ್ನು ಮಾನದಂಡವನ್ನಾಗಿಟ್ಟುಕೊಂಡು ಚೆನ್ನಾಗಿದೆ, ಚೆನ್ನಾಗಿಲ್ಲ, ಹೀಗಿದೆ, ಹಾಗಿದೆ ಎಂದು ನಿರ್ಣಯಗಳನ್ನು ಕೊಡುತ್ತಿರುತ್ತಾರೆ. ಅವರಿಗೆ ಆಗ ಅಲ್ಲಿ ದಕ್ಕಿರುವಂತಹ ಯಾವುದೇ ಒಂದು ಅನುಭವವನ್ನು ಆಸ್ವಾದಿಸಲು ಆಗುವುದಿಲ್ಲ. ಆಸ್ವಾದಿಸಲು ಆಗದಿರುವುದು ಆನಂದವನ್ನು ಕೊಡುವುದಿಲ್ಲ. ಅವರ ಆನಂದ ಅಥವಾ ನಿರಾಕರಣೆಗಳು ಹಿಂದಿನ ಅನುಭವಗಳ ನೆನಪಷ್ಟೇ ಆಗಿರುತ್ತವೆ.
ಕಿಚ್ಚಿನ ಹುಚ್ಚು
ಪೂರ್ವಾಗ್ರಹ ಪೀಡಿತವಾಗಿರುವ ಅಭಿಪ್ರಾಯಗಳು ಮತ್ತು ಧೋರಣೆಗಳು ಅರಿಮೆಯ ಭಾಗವಾಗಿ, ಮನಸ್ಥಿತಿಯ ರಚನೆಯಾಗಿರುವಾಗ ಅವುಗಳು ಶಾಂತವಾದ ಹೊನಲಾಗಿರುವುದಿಲ್ಲ. ಕಿಚ್ಚಿನ ಪ್ರವಾಹವಾಗಿರುತ್ತದೆ. ಈ ಕಿಚ್ಚು, ಮನೆಯೊಳಗಣ ಕಿಚ್ಚು ಹೆಚ್ಚಾದಷ್ಟೂ ವ್ಯಕ್ತಿಗಳಿರಲಿ, ಸಮೂಹ ಸಮೂಹಗಳೇ ಹುಚ್ಚಾಗುತ್ತವೆ. ಹಾಗೆ ಒಮ್ಮೆ ಹುಚ್ಚೆದ್ದರೆ ಮುಗಿಯಿತು. ತಮ್ಮ ಒಳಗೆ ಅರಿಮೆಯು ಸೃಷ್ಟಿಸಿರುವ ಮನಸ್ಥಿತಿಯ ದಂಡನಾಯಕನ ಆಜ್ಞೆಯಂತೆ ಯುದ್ಧಗಳನ್ನು ಮಾಡುತ್ತಿರುತ್ತಾರೆ. ಆ ದಂಡನಾಯಕನ ಆಶಯವು ತಾನು ಗೆಲ್ಲುವುದಷ್ಟೇ ಆಗಿರುತ್ತದೆ.
ಹಾಗಾಗಿಯೇ ಇಂತಹ ಅರಿಮೆಯ ವ್ಯಕ್ತಿಗಳ ಜೊತೆಗೆ ಸಂವಾದ ಸಾಧ್ಯವಾಗದು. ಅವರಲ್ಲಿ ಪ್ರಶ್ನೆಗಳು ಇರುವುದಿಲ್ಲ. ತೀರ್ಮಾನಗಳಿರುತ್ತವೆ. ಪ್ರಶ್ನೆಗಳಂತೆ ಕಂಡವು ಅವು ಉತ್ತರ ಪಡೆಯುವ ಆಶಯ ಅಥವಾ ಆಸಕ್ತಿಗಳಿಲ್ಲದೇ ಖಂಡಿಸಲು ಬಳಸುವ ಶಸ್ತ್ರಗಳಾಗಿರುತ್ತವೆ. ಅವರು ತಮ್ಮ ಎದುರಾಳಿಯು ಎಂದಿಗೂ ಮಾತನ್ನು ಪೂರೈಸಲು ಅಥವಾ ಅಭಿಪ್ರಾಯವನ್ನು ತಾರ್ಕಿಕವಾಗಿ ಮಂಡಿಸಲು ಬಿಡುವುದಿಲ್ಲ.
ಏಕೆಂದರೆ ಅವರು ಸಾಧಾರವಾಗಿ ಅಥವಾ ತರ್ಕಬದ್ಧವಾಗಿ ತನ್ನನ್ನು ಮಣಿಸಿಬಿಟ್ಟರೆ? ಅಥವಾ ತನ್ನ ವಿರುದ್ಧವಾಗಿ ವಿಜಯ ಸಾಧಿಸಿಬಿಟ್ಟರೆ ಎಂಬ ಭಯದಲ್ಲಿ ತಮ್ಮ ಮಾತುಗಳಲ್ಲಿ ನಿರಂತರ ಧಾಳಿ ಮಾಡುತ್ತಿರುತ್ತಾರೆ. ಎದುರಾಳಿಯ ಕ್ರಿಯೆಗೆ ಮುಂಚೆಯೇ ಪ್ರತಿಕ್ರಿಯೆ ಕೊಡುತ್ತಿರುತ್ತಾರೆ. ಅಟ್ಯಾಕಿಗೆ ಮುಂಚೆಯೇ ಕೌಂಟರ್ ಅಟ್ಯಾಕ್ ಮಾಡುವುದೆಂದರೆ ಇದೆಯೇ.
ಸಾಗಿದೆ ಸಂಗ್ರಾಮ
ಅರಿಮೆಗಳು ಅಥವಾ ಮಾನಸಿಕ ಸಂಕೀರ್ಣತೆಗಳು ಸೃಷ್ಟಿಸುವ ಸಂಘರ್ಷದ ಫಲವಾದರೂ ಏನು? ಅತೃಪ್ತಿ, ಆಯಾಸ ಮತ್ತು ಮತ್ತಷ್ಟು ಸಂಘರ್ಷಗಳಿಗೆ ಸರಕು. ತಾವು ಆಯಾಸಗೊಳ್ಳುತ್ತಾರೆ ಮತ್ತು ತಮ್ಮೊಡನೆ ಇರುವವರನ್ನು ಚೈತನ್ಯಹೀನರನ್ನಾಗಿ ಮಾಡುತ್ತಾರೆ. ಆಯಾಸಗೊಂಡಿರುವ ಬೇಸರ ಮತ್ತು ಮಾಡಬೇಕಾದ ಕೆಲಸಗಳನ್ನು ಮಾಡದೇ ಇರುವ ಅತೃಪ್ತಿಯು ಹತಾಶೆಯಿಂದ ಮತ್ತೆ ಸಂಘರ್ಷಕ್ಕೆ ಮುಂದಾಗುತ್ತದೆ. ಹಾಗೆಯೇ ಇವರಿಂದ ಸಮಸ್ಯೆಗೀಡಾದವರು ಅಥವಾ ಚೈತನ್ಯಹೀನರಾದ ಅನುಭವ ಪಡೆದವರೂ ಕೂಡಾ ಅದೇ ಕೋಪಕ್ಕೆ ಸಂಘರ್ಷಕ್ಕೆ ಇಳಿಯುತ್ತಾರೆ.
ನೋಡಿ, ಸಾವಿರ ಸಾವಿರ ವರ್ಷಗಳಿಂದ ಈ ಸಂಘರ್ಷಗಳು ಕೊನೆಗೊಂಡಿಲ್ಲ. ಬೇರೆ ಬೇರೆ ರೂಪಗಳಲ್ಲಿ ಮೈದೋರುತ್ತಲೇ ಇವೆ. ಆಗೆಲ್ಲಾ ಈ ಸಂಘರ್ಷಗಳ ಮೂಲ ತಿಳಿದಿರಲಿಲ್ಲ. ಸಂಘರ್ಷಗಳ ಕಾರಣವಾಗಿ ಅವರು ತಮ್ಮಲ್ಲಿ ಹುಟ್ಟುವ ಆಕ್ರೋಶ, ದ್ವೇಷ ಮತ್ತು ಅಸಹನೆಗೆ ಹೊರಗಿನ ಕಾರಣಗಳನ್ನು ಹುಡುಕುತ್ತಿದ್ದರು. ಹಾಗೆಯೇ ಹೊರಗಿನ ಸಂಗತಿಗಳಿಗೇ ಕಾರಣಗಳನ್ನು ಆರೋಪಿಸುತ್ತಿದ್ದರು. ಈಗ ನಮಗೆ ಕಾರಣಗಳನ್ನು ತಿಳಿಯುವ ಬಗೆಗಳು ಅನಾವರಣಗೊಂಡಿವೆ.
ಆದರೆ ಈ ವಿಧಾನಗಳು ತಿಳಿಯುವ ಮುನ್ನ ಅನುಸರಿಸುತ್ತಿದ್ದ ವಿಧಾನಗಳಂತೆಯೇ ಹೊರಗಿನ ಕಾರಣಗಳನ್ನೇ ಹುಡುಕುವ, ತನ್ನ ಜವಾಬ್ದಾರಿಯಿಂದ ಹೊರತಾದ ಸಂಗತಿಗಳನ್ನು ಗುರುತಿಸಿ ಅವುಗಳಿಗೆ ಕಾರಣಗಳನ್ನು ಆರೋಪಿಸುವ ರೂಢಿಯೇ ಇನ್ನೂ ಮುಂದುವರಿದಿದೆ. ಹಾಗೆಯೇ ವ್ಯಕ್ತಿಯ ಮತ್ತು ಸಮಾಜದ ಮಾನಸಿಕ ಸಮಸ್ಯೆಗಳು ಚಿಕಿತ್ಸೆಗೆ ಒಳಪಡುವುದಿರಲಿ, ಪತ್ತೆಗೆ ಒಳಗಾಗದಂತೆ ಜಾರಿಕೊಳ್ಳುತ್ತಿವೆ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ದೇವರ ಹೂವು
~ ಡಾ. ಸಿ.ಬಿ.ಐನಳ್ಳಿ
ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ
ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ
ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ
ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ
ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ4 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ4 days agoಕವಿತೆ | ದೇವರ ಹೂವು
-
ದಿನದ ಸುದ್ದಿ6 days agoಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
-
ದಿನದ ಸುದ್ದಿ3 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ3 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

