ದಿನದ ಸುದ್ದಿ
ಮೋದಿ ‘ಸರ್ಜಿಕಲ್ ಸ್ಟ್ರೈಕ್’ ಅನ್ನು ಬಡತನ, ನಿರುದ್ಯೋಗದ ವಿರುದ್ಧ ಮಾಡಬೇಕಿತ್ತು : ಕಪಿಲ್ ಸಿಬಲ್ ಕಿಡಿ
ಸುದ್ದಿದಿನ, ಬೆಂಗಳೂರು : ನರೇಂದ್ರ ಮೋದಿಯವರು ಸರ್ಜಿಕಲ್ ಸ್ಟ್ರೈಕ್ ಬಡತನದ ವಿರುದ್ಧ ಮಾಡಬೇಕಿತ್ತು. ನಿರುದ್ಯೋಗ ಸಮಸ್ಯೆ ವಿರುದ್ಧ ಮಾಡಬೇಕಿತ್ತು. ನಮ್ಮದೇ ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿವೆ ಅವುಗಳ ಬಗ್ಗೆ ಚಿಂತಿಸಲು ಅವರಿಗೆ ಸಮಯವಿಲ್ಲ. ಆದರೆ ಕೇವಲ ಪಾಕಿಸ್ತಾನದ ಬಗ್ಗೆ ಮಾತನಾಡುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು.
ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ದೇಶದ ಅಭಿವೃದ್ಧಿ ದೃಷ್ಟಿಯಿಂದ ಅರ್ಥ ಶಾಸ್ತ್ರಜ್ಞರ ಸಲಹೆ ಸೂಚನೆ ಮೇರೆಗೆ ಸಿದ್ಧಪಡಿಸಲಾಗಿದ್ದು ಯುಪಿಎ ಅವಧಿಯಲ್ಲಿ ಹಲವು ಖಾತೆಗಳನ್ನು ನಿಭಾಯಿಸಿದ ಕಪಿಲ್ ಸಿಬಲ್ ಅವರು ಪ್ರಣಾಳಿಕೆಯನ್ನು ಪ್ರಸ್ತುತ ಪಡಿಸಿ ಮಾತನಾಡಿದರು.
ಮೋದಿ ಸರ್ಕಾರದ ಕೆಟ್ಟ ಆರ್ಥಿಕ ಕ್ರಮಗಳಿಂದಾಗಿ ಇಂದು ದೇಶವು ನ್ಯಾಯ ಪಥದಿಂದ ಅನ್ಯಾಯದ ಪಥದ ಕಡೆಗೆ ಸಾಗಿದೆ. ಅಚ್ಚೇದಿನ್ ತರುವುದು, 15 ಲಕ್ಷ ನೀಡುವುದು, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಮೋದಿಯವರ ಭರವಸೆಯು ಸುಳ್ಳಿಗೆ ನೀಡಬಹುದಾದ ಉದಾಹರಣೆಯಾಗಿ ಮಾರ್ಪಾಡಾಗಿವೆ.ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಗುಂಪು ಹಲ್ಲೆ, ದಲಿತರ ಮೇಲಿನ ದೌರ್ಜನ್ಯ ದಂತಹ ಘಟನೆಗಳು, ಆಂತರಿಕ ಭದ್ರತೆಯು ಆತಂಕಕಾರಿ ಸ್ಥಿತಿ ತಲುಪಿದೆ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಸ್ಥಿತಿಯನ್ನು ಕಾಂಗ್ರೆಸ್ ಬದಲಾಯಿಸಿ, ಸಾಮಾಜಿಕ ನ್ಯಾಯವನ್ನ ಎತ್ತಿ ಹಿಡಿಯಲಿದೆ. ಕಾಂಗ್ರೆಸ್ಸಿನ ನ್ಯಾಯ ಯೋಜನೆಯನ್ನು ಅತ್ಯಂತ ಯೋಜಿತವಾಗಿ ರೂಪಿಸಲಾಗಿದೆ.ಇದಕ್ಕಾಗಿ ಪೂರಕವಾಗ ಆರ್ಥಿಕ ಸ್ಥಿತಿಯನ್ನು ಅದ್ಯಯನ ಮಾಡಿ, ಅದರ ಸಾದಕ ಬಾದಕಗಳನ್ನ ಚರ್ಚಿಸಿ ಆ ಬಳಿಕ ಈ ಯೋಜನೆಯನ್ನು ಘೋಷಿಸಲಾಗಿದೆ. ಈ ಯೋಜನೆಯನ್ನು ನಾವು ನಿಶ್ಚಿತವಾಗಿ ಜಾರಿಗೆ ತರುತ್ತೇವೆ ಎಂದರು.
ಉದ್ಯೋಗ ಸೃಷ್ಟಿಸಲು ಸಂಪೂರ್ಣವಾಗಿ ವಿಫಲವಾಗಿರುವ ಮೋದಿ ಸರ್ಕಾರವು ಯುವಕರಿಗೆ ನೀಡಿದ ಭರವಸೆಯನ್ನು ಈಡೇರಿಸಿದೆ ಅವರನ್ನು ವಂಚಿಸಿದೆ. ಕಾಂಗ್ರೆಸ್ ಪ್ರಣಾಳಿಕೆಯು ಉದ್ಯೋಗ ಸಮಸ್ಯೆಯ ಗಂಭೀರತೆ ಅರಿತಿದ್ದು ಸಣ್ಣ, ಮಧ್ಯಮ ಪ್ರಮಾಣದ ಕೈಗಾರಿಕೆಗಳನ್ನು ಅಭಿವೃದ್ಧಿ ಪಡಿಸಿ ಉದ್ಯೋಗ ಸಮಸ್ಯೆಗೆ ಪರಿಹಾರ ನೀಡಲಿದೆ ಎಂದರು
ಶ್ರೀಮಂತರು ಶ್ರೀಮಂತರಾಗಿ ಇರುವ, ಬಡವರು ಬಡವರಾಗಿ ಉಳಿಯುವ ವ್ಯವಸ್ಥೆಯನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ. 70 ರಿಂದ 80 ಕೋಟಿ ಜನರು 10000ರೂಕ್ಕಿಂತ ಕಡಿಮೆ ಆದಾಯ ಇರುವ ಜನರು ಇದ್ದಾರೆ. ಇವರ ಆರ್ಥಿಕ ಸ್ಥಿತಿ ಸುಧಾರಿಸಲು ಮೋದಿ ಸರ್ಕಾರ ಯಾವುದೇ ಕಾರ್ಯಕ್ರಮಗಳನ್ನು ಮಾಡಲಿಲ್ಲ
ಕಾಂಗ್ರೆಸ್ ಈ ಅಂತರವನ್ನು ಸರಿ ಮಾಡುತ್ತದೆ.ಕಾಂಗ್ರೆಸ್ ಈ ಹಿಂದೆ ಶಿಕ್ಷಣದ ಕಡ್ಡಾಯ ಹಕ್ಕನ್ನು ಜಾರಿಗೊಳಿಸಿತು. ಇನ್ನು ಮುಂದೆಯೂ 12 ನೇ ತರಗತಿಯವರೆಗೆ ಉಚಿತ ಶಿಕ್ಷಣವನ್ನು ನೀಡುವ ಬದ್ಧತೆಯನ್ನು ಕಾಂಗ್ರೆಸ್ ಪಕ್ಷವು ಹೊಂದಿದೆ. ಶಿಕ್ಷಣದ ಮೇಲಿನ ಅನುದಾನವನ್ನು 6% ಜಿಡಿಪಿಗೆ ಹೆಚ್ಚಿಸುವ ಮೂಲಕ ಶಿಕ್ಷಣದ ಮೇಲಿನ ವೆಚ್ಚವನ್ನು ಕಡಿಮೆ ಮಾಡಲಿದ್ದೇವೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ಹುದ್ದೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ಕುರಿತು ಕಾಂಗ್ರೆಸ್ ಪಕ್ಷವು ಚಿಂತಿಸಿದ್ದು ಇದು ಭಾರತದ ಇತಿಹಾಸದಲ್ಲೇ ಮಹತ್ವದ ಬೆಳವಣಿಗೆ ಆಗಿದೆ.ನ್ಯಾಯಾಂಗ ವ್ಯವಸ್ಥೆಯನ್ನು ಬಲ ಪಡಿಸಲು ಇನ್ನಷ್ಟು ನ್ಯಾಯಾಧೀಶರನ್ನು ನೇಮಕ ಮಾಡಿ 6 ಪ್ರಾಂತೀಯ ಕೋರ್ಟ್ ಗಳನ್ನು ಸ್ಥಾಪಿಸಿ ಅನ್ಯಾಯಕ್ಕೆ ಒಳಗಾದವರಿಗೆ ಶೀಘ್ರ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. GST ಸಮಿತಿಯನ್ನು ರಚಿಸಿ ಎಲ್ಲರಿಗೂ ಅನುಕೂಲವಾಗುವಂತೆ ಅದನ್ನು ಸರಳೀಕರಿಸಲಾಗುವುದು. ಮೋದಿಯವರು GST, MGNREGA ಹಾಗೂ ಇನ್ನೂ ಹಲವಾರು ಕಾಂಗ್ರೆಸ್ ಯೋಜನೆಗಳ ಜಾರಿಗೆ ವಿರೋಧಿಸಿದ್ದು ನಂತರದಲ್ಲಿ ತಾವೇ ಅದನ್ನು ಲೋಪಭರಿತ ಅನುಷ್ಠಾನದಿಂದ ಜನತೆಗೆ ತೊಂದರೆ ನೀಡಿದರು ಎಂದು ನುಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


