ರಾಜಕೀಯ
ಕೆ ಆರ್ ಎಸ್ ಜಲಾಶಯಕ್ಕೆ ಬಾಗಿನ ಅರ್ಪಣೆ | ನೆಮ್ಮದಿ ಬದುಕಿಗೆ ಜನತೆಗೆ ಹೊಸಯೋಜನೆಗಳು ಜಾರಿ : ಹೆಚ್ ಡಿ ಕೆ
ಸುದ್ದಿದಿನ,ಮಂಡ್ಯ | ರಾಜ್ಯದ ಜನರು ಶಾಶ್ವತವಾಗಿ ನೆಮ್ಮದಿಯಿಂದ ಬದುಕಲು ಸರ್ಕಾರ ಹಲವಾರು ಯೋಜನೆಗಳನ್ನು ಮುಂದಿನ ದಿನಗಳಲ್ಲಿ ಜಾರಿಗೆ ತರಲ್ಲಿದೆ ಎಂದು ಮುಖ್ಯ ಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
ಅವರು ಇಂದು ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಮಂಡ್ಯ ರೈತರು ಭತ್ತವನ್ನು ಬೆಳೆಯಲು ಸಾಧ್ಯವಾಗಿರಲಿಲ್ಲ. ಆದರೆ ಇಂದು ರಾಜ್ಯದಲ್ಲಿ ಉತ್ತಮ ಮಳೆಯಾದ ಕಾರಣ ಕೃಷ್ಣರಾಜಸಾಗರ ಜಲಾಶಯ ಸೇರಿದಂತೆ ಎಲ್ಲಾ ಜಲಾಶಯಗಳು ಭರ್ತಿಯಾಗಿದ್ದು, ಮಂಡ್ಯ ರೈತರಿಗೆ ಭತ್ತ ಬೆಳೆಯಲು ಸಾಧ್ಯವಾಗಿದೆ ಎಂದು ತಿಳಿಸಿದ ಅವರು ರೈತರ ಸಾಲ ಮನ್ನಾ ಮಾಡಲಾಗಿದ್ದು, ರೈತರ ಶ್ರೇಯೋಭಿವೃದ್ಧಿಗಾಗಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಯಾವುದೇ ಕಾರಣಕ್ಕೂ ರೈತರೂ ಆತ್ಮಹತ್ಮೆ ಮಾಡಿಕೊಳ್ಳಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕೃಷ್ಣರಾಜಸಾಗರದ ಜಲಾಶಯಕ್ಕೆ ಬಾಗಿನ ಅರ್ಪಿಸುವ ಸೌಭಾಗ್ಯ ನನ್ನದಾಗಿದ್ದು, ಈ ಕಾರ್ಯ ಅತ್ಯಂತ ಪವಿತ್ರವಾದದ್ದು ಆಗಿದೆ. ರಾಜ್ಯ ಜನತೆಗೆ ಆಶಯದಂತೆ ನಮ್ಮ ಸರ್ಕಾರದ ಸಚಿವರು ಆಡಳಿತ ನಡೆಸುವರು. ಈ ನಿಟ್ಟಿನಲ್ಲಿ ನಾವು ಕುಟುಂಬದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತೇವೆ ಎಂದು ಅವರು ತಿಳಿಸಿದರು.
ರಾಜ್ಯದ ಎಲ್ಲಾ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ನಮ್ಮ ಮಂತ್ರವಾಗಿದ್ದು, ಕೊಡಗಿನಲ್ಲಿ ಮಳೆಯಿಂದ ಆದ ಅನಾಹುತಗಳನ್ನು ಸರಿಪಡಿಸಲು ಮೊದಲು ಹಂತದಲ್ಲಿ 100 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ರಾಜ್ಯದ ಯಾವುದೇ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡದೇ ಮಾದರಿ ರಾಜ್ಯ ಮಾಡುವ ಗುರಿ ನಮ್ಮ ಸರ್ಕಾರದ್ದು ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಕೊಡಗಿನ ತಲಕಾವೇರಿ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಾಡದೇವತೆ ಚಾಮುಂಡೇಶ್ವರಿ ತಾಯಿಯಲ್ಲಿ ಪೂಜೆ ಹಾಗೂ ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿ ಸರ್ಕಾರ ಹಾಗೂ ರಾಜ್ಯದ ಜನತೆಯ ಏಳಿಗೆಗಾಗಿ ಪೂಜೆ ನೆರೆವೇರಿಸಲಾಗಿದೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶ್ರೀರಂಗಪಟ್ಟಣದ ಶಾಸಕರಾದ ರವೀಂದ್ರ ಶ್ರೀಕಂಠಯ್ಯರವರು ಕೃಷ್ಣರಾಜಸಾಗರದ ಜಲಾಶಯವನ್ನು ಡಿಸ್ನಿ ಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಬಜೆಟ್‍ನಲ್ಲಿ ಘೋಷಿಸಲಾಗಿದ್ದು, ಈಗಾಗಲೇ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಜಲಾಶಯವು ಡಿಸ್ನಿ ಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಯಾಗುವುದರಿಂದ ಉದ್ಯೋಗ ಸೃಷ್ಠಿಯ ಜೊತೆಗೆ ಸರ್ಕಾರಕ್ಕೆ ಹೆಚ್ಚಿನ ಆದಾಯ ಹರಿದು ಬರಲ್ಲಿದೆ ಎಂದು ತಿಳಿಸಿದ ಅವರು ಕೃಷ್ಣರಾಜಸಾಗರ ಕಟ್ಟಿದ ಜನರು ಈ ಭಾಗದಲ್ಲಿ ನೂರಾರು ವರ್ಷಗಳಿಂದ ವಾಸಿಸುತ್ತಿರುವ ನಿವಾಸಿಗಳು ಹಕ್ಕು ಪತ್ರದಿಂದ ವಂಚಿತÀರಾಗಿದ್ದು, ಸರ್ಕಾರವು ಇಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರಾದ ಜಿ.ಟಿ.ದೇವೆಗೌಡ, ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ, ಪ್ರವಾಸೋದ್ಯಮ ಸಚಿವರಾದ ಸಾರಾ ಮಹೇಶ್, ಮಂಡ್ಯ ವಿಧಾನಸಭಾ ಶಾಸಕರಾದ ಎಂ.ಬಿ.ಶೀನಿವಾಸ್, ಕೆ.ಆರ್.ಪೇಟೆ ವಿಧಾನಸಭಾ ಶಾಸಕರಾದ ನಾರಾಯಣಗೌಡ, ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ಶ್ರೀಕಂಠೇಗೌಡ, ಅಪ್ಪಾಜಿ ಗೌಡ, ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿ.ರಾಧಿಕಾ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಬಿ.ಶರತ್, ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರಾದ ಅಮರ್‍ನಾಥ್ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


