ಅಂಕಣ
ಕವಿತೆ | ಯಾವ ಕಾಲದ ಶಾಸ್ತ್ರವೇನು ಹೇಳಿದರೇನು..?
- ಕುವೆಂಪು
ಯಾವ ಕಾಲದ ಶಾಸ್ತ್ರವೇನು ಹೇಳಿದರೇನು ?
ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು ?
ಎಂದೋ ಮನು ಬರೆದಿಟ್ಟುದಿಂದೆಮಗೆ ಕಟ್ಟೇನು ?
ನಿನ್ನೆದೆಯ ದನಿಯೆ ಋಷಿ ! ಮನು ನಿನಗೆ ನೀನು !
ನೀರಡಿಸಿ ಬಂದ ಸೋದರಗೆ ನೀರನು ಕೊಡಲು
ಮನುಧರ್ಮಶಾಸ್ತ್ರವೆನಗೊರೆಯಬೇಕೇನು ?
ನೊಂದವರ ಕಂಬನಿಯನೊರಸಿ ಸಂತೈಸುವೊಡೆ
ಶಾಸ್ತ್ರ ಪ್ರಮಾಣವದಕಿರಲೆ ಬೇಕೇನು ?
ಪಂಚಮರ ಶಿಶುವೊಂದು ಕೆರೆಯಲ್ಲಿ ಮುಳುಗುತಿರೆ
ದಡದಲ್ಲಿ ಮಿಯುತ್ತ ನಿಂತಿರುವ ನಾನು
ಮುಟ್ಟಿದರೆ ಬ್ರಹ್ಮತ್ವ ಕೆಟ್ಟುಹೋಗುವುದೆಂದು
ಸುಮ್ಮನಿದ್ದರೆ ಶಾಸ್ತ್ರಸಮ್ಮತವದೇನು?
ಅಂತು ಮನು ತಾನು ಹೆಲಿರಲಾರನಯ್ಯಯ್ಯೊ!
ಹೇಳಿದ್ದರವನನೂ ಶಾಸ್ತ್ರದೊಳೆ ಸುತ್ತಿ,
ಸ್ವರ್ಗ ಹೋಗಲಿ, ಮತ್ತೆ ನರಕ ಬಂದರು ಬರಲಿ,
ಎದೆಯ ಧೈರ್ಯವ ಮಾಡಿ ಬಿಸುಡಾಚೆಗೆತ್ತಿ!
ಸ್ವರ್ಗ ಹೋಗುವುದಿಲ್ಲ, ನರಕ ಬರುವುದು ಇಲ್ಲ;
ಸ್ವರ್ಗ ನರಕಗಳೇನು ಶಾಸ್ತ್ರಸ್ಥವಲ್ಲ .
ಎದೆಯ ದನಿ ಧರ್ಮನಿಧಿ ! ಕರ್ತವ್ಯವದುವೆ ವಿಧಿ !
ನಂಬದನು; ಅದನುಳಿದು ಋಷಿಯು ಬೇರಿಲ್ಲ!
ಹಿಂದಿನಾ ಋಷಿಗಳೂ ಮಾನವರೆ ನಮ್ಮಂತೆ,
ಅವರ ಶಾಸ್ತ್ರವು ಅವರ ಕಾಲಕ್ಕೆ ಮಾತ್ರ;
ಕಾಲಕ್ಕೆ ತಕ್ಕಂತೆ, ದೇಶಕ್ಕೆ ತಕ್ಕಂತೆ,
ನಮ್ಮ ಹೃದಯವೆ ನಮೆಗೆ ಶ್ರೀಧರ್ಮಸೂತ್ರ !(ರಾಷ್ಟ್ರಕವಿ ಕುವೆಂಪು ಅವರ ‘ಕೋಗಿಲೆ ಮತ್ತು ಸೋವಿಯಟ್ ರಷ್ಯ’ ಕವನಸಂಕಲನದಿಂದ )
ಸುದ್ದಿದಿನ.ಕಾಂ|ವಾಟ್ಸಾಪ್|9980346243