Connect with us

ದಿನದ ಸುದ್ದಿ

ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ನಾಯಕ ಎಲ್‌ಐಸಿ ನೌಕರರ ಮತ್ತು ನಿವೃತ್ತ ನೌಕರರ ಹಿತರಕ್ಷಣಾ ವೇದಿಕೆ ಉದ್ಘಾಟನೆ

Published

on

ಸುದ್ದಿದಿನ,ದಾವಣಗೆರೆ:ಹೋಟೆಲ್ ಓಷನ್ ಪಾರ್ಕ್ನ ಆನೆಕೊಂಡ ಹನುಮಂತಪ್ಪ ಕನ್‌ವೆನ್‌ಷನ್ ಹಾಲ್‌ನಲ್ಲಿ ಆಯೋಜಿಸಿದ್ದ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ನಾಯಕ ಎಲ್‌ಐಸಿ ನೌಕರರ ಮತ್ತು ನಿವೃತ್ತ ನೌಕರರ ಹಿತರಕ್ಷಣಾ ವೇದಿಕೆ ಉದ್ಘಾಟನಾ ಕಾರ್ಯಕ್ರಮವನ್ನು ವಾಲ್ಮೀಕಿ ಜಗದ್ಗುರು ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಉದ್ಘಾಟಿಸಿದರು.

ಸಮಾಜದ ಹಿತಕ್ಕಾಗಿ ಸಂಘಟನೆ ಅತ್ಯಗತ್ಯ, ಏಕೆಂದರೆ ಅದು ಸಮ ಸಮಾಜ ನಿರ್ಮಾಣ, ಆರ್ಥಿಕ ಸಬಲೀಕರಣ, ಅಭಿವೃದ್ಧಿ ಮತ್ತು ಸಮಸ್ಯೆಗಳ ಪರಿಹಾರಕ್ಕೆ ಸಹಕಾರಿಯಾಗುತ್ತದೆ. ಸಂಘಟನೆಯಿಂದ ಸಮುದಾಯ ತಮ್ಮ ಹಕ್ಕುಗಳನ್ನು ಪಡೆಯಲು ಶಕ್ತಿಯನ್ನು ನೀಡುತ್ತದೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಕರೆ ನೀಡಿದರು.

ನಗರದ ಪಿ.ಬಿ.ರಸ್ತೆಯ ಹೋಟೆಲ್ ಓಷನ್ ಪಾರ್ಕ್ನ ಆನೆಕೊಂಡ ಹನುಮಂತಪ್ಪ ಕನ್‌ವೆನ್‌ಷನ್ ಹಾಲ್‌ನಲ್ಲಿ ಶನಿವಾರ ಆಯೋಜಿಸಿದ್ದ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ನಾಯಕ ಎಲ್‌ಐಸಿ ನೌಕರರ ಮತ್ತು ನಿವೃತ್ತ ನೌಕರರ ಹಿತರಕ್ಷಣಾ ವೇದಿಕೆ ಉದ್ಘಾಟನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ…

Bank Holidays: 2026ರ ಮೊದಲ ತಿಂಗಳಲ್ಲೇ ಸಾಲು ಸಾಲು ರಜೆ, ಕರ್ನಾಟಕದ ಬ್ಯಾಂಕ್ ಆಧಾರಿತ ರಜೆ ಎಷ್ಟು?

ಸಮಾನತೆ ಮತ್ತು ನ್ಯಾಯ ಆಧಾರಿತ ಸಮಾಜವನ್ನು ರೂಪಿಸಲು ಸಂಘಟಿತ ಹೋರಾಟ ಮುಖ್ಯ. ಸಮಾಜವನ್ನು ಆರ್ಥಿಕವಾಗಿ ಸದೃಢಗೊಳಿಸಲು, ಶಿಕ್ಷಣ ಮತ್ತು ಇತರ ಸೌಲಭ್ಯಗಳನ್ನು ಪಡೆಯಲು ಸಂಘಟನೆ ಸಹಕಾರಿ. ಈ ನಿಟ್ಟಿನಲ್ಲಿ ಎಲ್ಐಸಿ ನೌಕರರು ಸಂಘ ಸ್ಥಾಪಿಸುವ ಮೂಲಕ ಸಂಘಟಿತರಾಗುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.

ದಾವಣಗೆರೆಯಲ್ಲಿ ಆರಂಭವಾಗಿರುವ ನಿಮ್ಮ ಸಂಘಟನೆ ಕೇವಲ ದಾವಣಗೆರೆಗೆ ಸೀಮಿತವಾಗದೆ ರಾಜ್ಯಾದ್ಯಂತ ಸಂಘಟನೆ ಆಗಬೇಕು. ಇಲ್ಲಿಂದಲೇ ನಿರ್ಣಯ ತೆಗೆದುಕೊಂಡು ರಾಜ್ಯದ ೩೦ ಜಿಲ್ಲೆಗಳಲ್ಲಿ ಸಭೆ, ಸಮಾರಂಭಗಳನ್ಬು ಅಯೋಜಿಸುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ಸಂಘಟನೆಯನ್ನು ತೊಡಗಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ನಿವೃತ್ತ ಪ್ರಾಂಶುಪಾಲ ಡಾ.ಎಂ.ಮಂಜಣ್ಣ ಮಾತನಾಡಿ, ಯಾವುದೇ ಸಂಘಟನೆ ನೊಂದವರಿಗೆ ದನಿಯಾಗಬೇಕು. ಸಂಘಟನೆ ಜೊತೆಗೆ ಮಕ್ಕಳಲ್ಲಿ ಜವಾಬ್ದಾರಿಗಳನ್ನು ಬೆಳೆಸಬೇಕೆಂದು ಸಲಹೆ ನೀಡಿದರು.

ನಟ, ನಿರ್ದೇಶಕ ಮತ್ತು ನಿರ್ಮಾಪಕ ರಾಧಾಕೃಷ್ಣ ಪಲ್ಲಕ್ಕಿ ಮಾತನಾಡಿ, ಯೋಚನೆ ಮತ್ತು ಉದ್ದೇಶಗಳು ಸರಿಯಾಗಿದ್ದರೆ, ಯಾವುದೇ ಒಂದು ವೇದಿಕೆ ಅತ್ಯಲ್ಪ ಕಾಲದಲ್ಲಿ ಅತ್ಯುತ್ತಮ ಸ್ಥಾನ ಗಳಿಸುತ್ತದೆ ಎಂಬುದಕ್ಕೆ ಈ ಸಂಘಟನೆ ಉದಾಹರಣೆಯಾಗಿದೆ. ಸಂಘಟನೆ ಮತ್ತು ಒಗ್ಗಟ್ಟು ಇಲ್ಲದಿದ್ದರೆ ಯಾವುದೇ ಸಮಾಜ ಮತ್ತು ಪುಣ್ಯ ಪುರಷರು ಇತಿಹಾಸದಲ್ಲಿ ಮಣ್ಣಾಗಿ ಹೋಗುತ್ತಾರೆ. ಪಾಳೆಗಾರರ ಆಳ್ವಿಕೆ ಕುರಿತ ಐತಿಹಾಸಿಕ ವಿಚಾರಗಳನ್ನು ತಿಳಿಸಿದರು.

ಸಂಘದ ಸಂಸ್ಥಾಪಕ ಅಧ್ಯಕ್ಷ ಬಿ.ಟಿ.ಬಸವರಾಜ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ರಾಮಚಂದ್ರಪ್ಪ, ಉಪಾಧ್ಯಕ್ಷ ಶಂಭು ನಾಯಕ, ಶ್ರೀನಿವಾಸ, ಶಿವಣ್ಣ, ವೆಂಕಟೇಶ್ ಎನ್.ಪೂಜಾರ್, ನಂದೀಶ್ ವಿ.ಬ್ಯಾಡಗಿ, ದಿವಾಕರ, ಸರಸ್ವತಿ, ಡಿ.ಬೊಮ್ಮಾಯಿ, ವೆಂಕಪ್ಪ ನಾಯಕ, ದೊರೆಸ್ವಾಮಿ ನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಎಲ್‌ಐಸಿ ದಾವಣಗೆರೆ-೨ ಕಚೇರಿಯ ಅಭಿವೃದ್ಧಿ ಅಧಿಕಾರಿ ಸಿ.ರವಿ ಸೇರಿದಂತೆ ರಾಜ್ಯದಿಂದ ಆಗಮಿಸಿದ್ದ ವಿವಿಧ ಜಿಲ್ಲೆಗಳ ಎಲ್‌ಐಸಿ ಅಭಿವೃದ್ಧಿ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಆರ್.ಗೌತಮಿ ಪ್ರಾರ್ಥಿಸಿದರು.

‘ಯಾವುದೇ ಸಮಾಜದ ಪ್ರಗತಿ ಮತ್ತು ಅಭಿವೃದ್ಧಿಗೆ ಸಂಘಟನೆ ಒಂದು ಮೂಲಾಧಾರ.ಸಂಘಟನೆಯಿಂದ ಸಮಾಜ ಬೆಳೆಯುತ್ತದೆ. ವ್ಯಕ್ತಿಗಳು ಹಾಗೂ ಇಲಾಖೆಗಳ ಪರಿಚಯ, ಸರ್ಕಾರದ ಯೋಜನೆಗಳು, ಸಮಾಜದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳು, ಬೆಳವಣಿಗೆ ಮೊದಲಾದವುಗಳನ್ನು ಹಂಚಿಕೊಳ್ಳಬಹುದು. ಸಂಘಟನೆ ಸಮಾಜದ ಶಕ್ತಿಯಾಗಿರುತ್ತದೆ’.

| ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ, ಜಗದ್ಗುರು, ವಾಲ್ಮೀಕಿ ಗುರುಪೀಠ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.

ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.

ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending