Connect with us

ಅಂತರಂಗ

ದ್ವೇಷ ರಾಜಕಾರಣದಿಂದ ಹೊಲಸು ರಾಜಕಾರಣದವರೆಗೆ

Published

on

ರಾಜಕೀಯೇತರ ಕಾಣದ ಕೈಗಳ ವಿಕೃತಿಗಳಿಗೆ ಸಾಂಸ್ಕೃತಿಕ ರಾಜಕಾರಣದ ಸುಭದ್ರ ಬುನಾದಿ ಇದೆ

  • ನಾ ದಿವಾಕರ

ಭಾರತದ ಅಧಿಕಾರ ರಾಜಕಾರಣ ತನ್ನ ಸತ್ವಯುತ ಮೌಲ್ಯಗಳನ್ನು ಕಳೆದುಕೊಂಡು ದಶಕಗಳೇ ಸಂದಿವೆ. 1980ರ ದಶಕದಲ್ಲಿ ಜಾತಿ ರಾಜಕಾರಣ ಪರಾಕಾಷ್ಠೆ ತಲುಪಿದ್ದರೂ, ಆಯಾರಾಂ ಗಯಾರಾಂ ಸಂತತಿಯು ರಕ್ತಬೀಜಾಸುರರಂತೆ ಎಲ್ಲೆಡೆ ಸೃಷ್ಟಿಯಾಗುತ್ತಿದ್ದರೂ, ಅಧಿಕಾರ ರಾಜಕಾರಣ ತನ್ನ ಪೀಠ ಉಳಿಸಿಕೊಳ್ಳಲು ಭಯೋತ್ಪಾದನೆ, ಕೋಮುವಾದ, ಜಾತಿವಾದ, ಮತಾಂಧತೆ ಮುಂತಾದ ಎಲ್ಲ ರೀತಿಯ ವಿಚ್ಚಿದ್ರಕಾರಕ ಧೋರಣೆಗಳನ್ನು ಪೋಷಿಸುತ್ತಿದ್ದಾಗಲೂ, ಎಲ್ಲೋ ಒಂದು ಕಡೆ “ಮೌಲ್ಯಾಧಾರಿತ ರಾಜಕಾರಣ ” ಎಂಬ ಕ್ಷೀಣ ಸ್ವರ ಕೇಳಿಬರುತ್ತಿತ್ತು.

ಈ ಭ್ರಮಾತ್ಮಕ ಪರಿಕಲ್ಪನೆಗೆ ಕರ್ನಾಟಕವೇ ತವರುಮನೆಯಾಗಿತ್ತು ಎಂದರೆ ನಂಬಲಾಗದಷ್ಟು ಮಟ್ಟಿಗೆ ಇಂದು ರಾಜ್ಯ ರಾಜಕಾರಣ ಸಂಪೂರ್ಣ ಬೆತ್ತಲಾಗಿ ನಿಂತುಬಿಟ್ಟಿದೆ. 1960ರ ದಶಕದ ನೈತಿಕ ಮೌಲ್ಯಗಳು 80ರ ದಶಕದ ವೇಳೆಗೆ ಅಧಿಕಾರ ಮೌಲ್ಯಗಳಾಗಿ ಪರಿವರ್ತಿತವಾದವು. ಹೊಸ ಸಹಸ್ರಮಾನದ ಆರಂಭಕ್ಕೆ ಇದು ಮಾರುಕಟ್ಟೆ ಮೌಲ್ಯವಾಗಿ ಬದಲಾಗಿತ್ತು.

ಆತ್ಮನಿರ್ಭರ ಭಾರತದಲ್ಲಿ ಈಗ ಮೂರೂ ಮಾದರಿಯ ಮೌಲ್ಯಗಳು ಅರ್ಥಹೀನವಾಗಿ ಕಾಣುತ್ತಿವೆ. ಹಾಗಾಗಿಯೇ ಇಂದು ಪಕ್ಷಾಂತರ, ಭ್ರಷ್ಟಾಚಾರ, ಹಗರಣಗಳು ಸದ್ದು ಮಾಡುತ್ತಿಲ್ಲ. ಕುದುರೆ ವ್ಯಾಪಾರ ಎನ್ನುವ ಪದಬಳಕೆಯೇ ಇಲ್ಲವಾಗಿದೆ. ಕಾರಣ, ಶಾಸಕರು, ಸಂಸದರು ಮುಕ್ತ ಮಾರುಕಟ್ಟೆಯಲ್ಲಿ ಖುಲ್ಲಂಖುಲ್ಲಾ ಬಿಕರಿಯಾಗುತ್ತಿದ್ದಾರೆ. ಹೀಗೆ ಬಿಕರಿಯಾದ ಅನರ್ಹ ಶಾಸಕರನ್ನೊಳಗೊಂಡ ಸರ್ಕಾರಗಳು ನಮ್ಮ ಸಂವಿಧಾನವನ್ನು ಪ್ರತಿನಿಧಿಸುತ್ತಿವೆ.

ಭಾರತದ ಸಂವಿಧಾನ ಜನಾಂಗೀಯ ಅನುಪಾತ ಆಧಾರಿತ ಪ್ರಾತಿನಿಧ್ಯ ವ್ಯವಸ್ಥೆಯನ್ನು ಸ್ವೀಕರಿಸಿಲ್ಲ. ಸಾಂವಿಧಾನಿಕ ಮೌಲ್ಯಗಳಿಗೆ ಬದ್ಧರಾಗಿ ಜನರಿಂದ ಚುನಾಯಿತರಾಗುವ ಪ್ರತಿನಿಧಿಗಳು, ಜಾತಿ-ಮತ-ಕುಲ-ಪಂಥ-ಪಂಗಡ ಈ ಎಲ್ಲ ಅಸ್ಮಿತೆಗಳಿಂದ ಹೊರತಾದ ಸಮಾಜವನ್ನು ಪ್ರತಿನಿಧಿಸುತ್ತಾರೆ.

ಈ ಕನಿಷ್ಠ ಪ್ರಜ್ಞೆಯನ್ನೂ ಕಳೆದುಕೊಂಡಿರುವ ಇಂದಿನ ಜನಪ್ರತಿನಿಧಿಗಳು ಪಕ್ಷ ರಾಜಕಾರಣ ಮತ್ತು ತಮ್ಮ ಪಕ್ಷಗಳ ಸೈದ್ಧಾಂತಿಕ ನೆಲೆಗಳನ್ನೇ ಆಶ್ರಯಿಸಿ ಜನಸಾಮಾನ್ಯರನ್ನು ವಿಂಗಡಿಸಿ, ವಿಭಜಿಸಿ ನೋಡಲಾರಂಭಿಸಿದ್ದಾರೆ. ಮಂಡಲ ಪಂಚಾಯತ್‌ನಿಂದ ಸಂಸತ್ತಿನವರೆಗೆ ಚುನಾಯಿತರಾದ ಯಾವುದೇ ಪ್ರತಿನಿಧಿ ತನ್ನ ಕೌಟುಂಬಿಕ ವಲಯದಿಂದ ಹೊರಗೆ ಕಾಲಿಟ್ಟ ಕೂಡಲೇ ಸಾರ್ವಜನಿಕ ವ್ಯಕ್ತಿತ್ವ ಪಡೆದುಕೊಳ್ಳುತ್ತಾನೆ/ಳೆ. ಅದರೊಂದಿಗೇ ತನ್ನ ಕೌಟುಂಬಿಕ ನೆಲೆಯ ಅಸ್ಮಿತೆಗಳನ್ನೂ, ನಂಬಿಕೆ ಮತ್ತು ಆಚರಣೆಗಳನ್ನೂ, ಮತಶ್ರದ್ಧೆ ಮತ್ತು ಜಾತಿ ನಿಷ್ಠೆಯನ್ನೂ ಕಳೆದುಕೊಳ್ಳಬೇಕಾಗುತ್ತದೆ.

ಪ್ರಜಾಪ್ರಭುತ್ವ ವ್ಯವಸ್ಥೆಯೇ ಧರ್ಮ, ಸಂವಿಧಾನವೇ ಧರ್ಮ ಗ್ರಂಥ ಆಗಬೇಕಾಗುತ್ತದೆ. ಈ ಸಾಂವಿಧಾನಿಕ ಮೌಲ್ಯಗಳನ್ನು ಸಂಪೂರ್ಣವಾಗಿ ಕಳೆದುಕೊಂಡಿರುವುದರಿಂದಲೇ ಭಾರತದ ಪ್ರಜಾತಂತ್ರ ಇಂದು ಅವನತಿಯತ್ತ ಸಾಗುತ್ತಿದೆ.

ಸಾರ್ವಜನಿಕರ ನಡುವೆ ಸಂವಿಧಾನವನ್ನು ಪ್ರತಿನಿಧಿಸಬೇಕಾದ ಚುನಾಯಿತ ಪ್ರತಿನಿಧಿಗಳು ತಮ್ಮ ಮನೆಯ ಹೊಸ್ತಿಲಿನಿಂದಾಚೆಗೆ ಆಡುವ ಪ್ರತಿಯೊಂದು ಮಾತಿಗೂ ಸಾರ್ವಜನಿಕ, ಸಾರ್ವತ್ರಿಕ ಮೌಲ್ಯ ಇರುತ್ತದೆ. ಸಾಂವಿಧಾನಿಕ ನೈತಿಕತೆಯನ್ನು ಗೌರವಿಸಿ ಈ ಮೌಲ್ಯಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಂದು ರಾಜಕೀಯ ಪಕ್ಷದ ನೈತಿಕ ಹೊಣೆಯೂ ಆಗಿರುತ್ತದೆ.

ಇದು ಅರಿವಾಗಬೇಕಾದರೆ ಜನಪ್ರತಿನಿಧಿಗಳಿಗೆ ಸಮಾಜದ ನಾಡಿ ಮಿಡಿತ ಅರ್ಥವಾಗಬೇಕು. ಕಾರ್ಪೋರೇಟ್‌ ಮಾರುಕಟ್ಟೆಯ ಹಣ ಚೆಲ್ಲುವ ಮೂಲಕ ಬಹುಮತ ಗಳಿಸಿದ್ದರೂ, ಕೆಳಸ್ತರದ ದುಡಿಮೆಯ ಜನರು ತಮ್ಮ ಜೀವನೋಪಾಯದ ಮಾರ್ಗಗಳನ್ನು ಸುಗಮಗೊಳಿಸುವ ಒಂದು ಸಮನ್ವಯದ ಸಮಾಜವನ್ನು ಬಯಸಿ ಮತ ನೀಡಿರುತ್ತಾರೆ. ಈ ದುಡಿವ ಜನಗಳ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕಾದರೆ, ಅಸ್ಮಿತೆಗಳ ಚೌಕಟ್ಟಿನಿಂದ ಹೊರಬಂದು ಆಲೋಚನೆ ಮಾಡಬೇಕಾಗುತ್ತದೆ.

ಈ ಶ್ರಮಿಕರ ಮತ್ತು ಶ್ರಮವನ್ನೇ ನಂಬಿ ಬದುಕುವ ಕೋಟ್ಯಂತರ ಕುಟುಂಬಗಳ ನಾಡಿಮಿಡಿತವನ್ನು ಗ್ರಹಿಸದ ಹೊರತು ಈ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲಾಗುವುದಿಲ್ಲ. ಧಾರವಾಡದಲ್ಲಿ ಐದು ಕ್ವಿಂಟಲ್‌ ಕಲ್ಲಂಗಡಿ ಹಣ್ಣನ್ನು ಮಣ್ಣು ಮಾಡಿದ ಮತಾಂಧರಿಗೆ ಮತೀಯ ಉನ್ಮಾದ ಖುಷಿ ನೀಡಬಹುದು ಆದರೆ ಈ ಕಲ್ಲಂಗಡಿಯ ಹಿಂದೆ ಇರುವ ಕಾಯಕ ಸಮಾಜದಲ್ಲಿ ಅಂಗಡಿಯನ್ನು ಕಳೆದುಕೊಂಡ ಮುಸ್ಲಿಂ ವೃದ್ಧನೊಂದಿಗೇ ನೂರಾರು ಹಿಂದೂ, ದಲಿತ, ಕ್ರೈಸ್ತ ಶ್ರಮಜೀವಿಗಳಿರುತ್ತಾರೆ. ಈ ವಾಸ್ತವವನ್ನು ಅರ್ಥಮಾಡಿಕೊಂಡರೆ ಜನಪ್ರತಿನಿಧಿಗಳು ಇಂತಹ ದುಷ್ಕೃತ್ಯಗಳನ್ನು ಕೂಡಲೇ ಖಂಡಿಸಬೇಕಾಗುತ್ತದೆ.

ಇಂತಹ ವ್ಯವಸ್ಥೆಯಲ್ಲಿ ಒಂದು ಪ್ರಜಾಸತ್ತಾತ್ಮಕ ಸಂವಿಧಾನವನ್ನು ಪ್ರತಿನಿಧಿಸುವ ವ್ಯಕ್ತಿಗಳಿಗೆ ತಮ್ಮ ಸಾರ್ವಜನಿಕ ವ್ಯಕ್ತಿತ್ವದ ಪರಿವೆ, ಪರಿಜ್ಞಾನ ಇರಬೇಕಲ್ಲವೇ ? ಅಸ್ಪೃಶ್ಯತೆ, ಜಾತಿ ತಾರತಮ್ಯ, ಜಾತಿ ದೌರ್ಜನ್ಯ ಮತ್ತು ಮತೀಯ ದ್ವೇಷದ ಸರಕುಗಳನ್ನು ಹೊತ್ತುಕೊಂಡು, ಮತದಾರರ ನಡುವೆ ಅಮೂಲ್ಯ ಮತಗಳನ್ನು ಬಿಕರಿ ಮಾಡುತ್ತಾ, ಕೊನೆಗೆ ಅಧಿಕಾರ ಲಾಲಸೆಗಾಗಿ ತಮ್ಮನ್ನೂ ಬಿಕರಿಗಿಟ್ಟು ಮಾರಿಕೊಳ್ಳುವ ಜನಪ್ರತಿನಿಧಿಗಳಲ್ಲಿ ಈ ಪರಿಜ್ಞಾನವನ್ನು ಅಪೇಕ್ಷಿಸಲಾದೀತೇ ? ಧಾರವಾಡದಲ್ಲಿ ಮಣ್ಣಾದ ಕಲ್ಲಂಗಡಿ ಹಣ್ಣುಗಳು ಈ ದ್ವೇಷ ರಾಜಕಾರಣವನ್ನೇ ಪ್ರತಿನಿಧಿಸುತ್ತವೆ.

ಈ ದ್ವೇಷ ಎಲ್ಲಿಯವರೆಗೆ ಹರಡಲು ಸಾಧ್ಯ ? ಒಂದು ಮಂದಿರಕ್ಕಾಗಿ, ಚಾರಿತ್ರಿಕ ಮಸೀದಿಗಾಗಿ ಗತ ಇತಿಹಾಸವನ್ನೇ ಪಲ್ಲಟಗೊಳಿಸಿ ಸಮಕಾಲೀನ ಸಮಾಜದ ಮನುಜ ಸಂಬಂಧಗಳನ್ನು ಮರುವಿಶ್ಲೇಷಣೆಗೊಳಪಡಿಸುವ ಸಾಂಸ್ಕೃತಿಕ ರಾಜಕಾರಣದ ಪರಿಣಾಮ ಇಂದು ಭಾರತದಲ್ಲಿ ಜನಾಂಗೀಯ ದ್ವೇಷ ಮಡುಗಟ್ಟಿದೆ. ನಿರ್ದಿಷ್ಟ ಮತಶ್ರದ್ಧೆಯನ್ನು ಪ್ರತಿನಿಧಿಸುವ ಮತೀಯ ಸಂಘಟನೆಗಳು, ಧಾರ್ಮಿಕ ನೇತಾರರು, ಮುಸ್ಲಿಂ ಮೌಲ್ವಿಗಳು, ಹಿಂದೂ ಮಠಾಧೀಶರು, ಮಠೋದ್ಯಮಿಗಳು, ಸಾಧು ಸಂತರು ತಮ್ಮದೇ ಆದ ಸಾಂಸ್ಥಿಕ, ಮತ ಕೇಂದ್ರಿತ, ಧರ್ಮ ಕೇಂದ್ರಿತ ಅಸ್ಮಿತೆಗಳನ್ನು ರಕ್ಷಿಸಿಕೊಳ್ಳಲು ಅಧಿಕಾರ ಕೇಂದ್ರಗಳೊಡನೆ ನಿಕಟ ಸಂಪರ್ಕವನ್ನು ಸಾಧಿಸಿ ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ.

ಇದರೊಂದಿಗೇ ಹಿಂದೂ ಧರ್ಮ ರಕ್ಷಣೆಗೆ, ಇಸ್ಲಾಂ ಧರ್ಮ ರಕ್ಷಣೆಗೆ ಟೊಂಕ ಕಟ್ಟಿ ನಿಂತ ಹತ್ತು ಹಲವು ಸಂಘಟನೆಗಳು ಇಂದು ದೇಶಾದ್ಯಂತ ಹರಡಿವೆ. ಹರಿದ್ವಾರದಲ್ಲಿ ನಡೆದ ಹಿಂದೂ ಸಂತರ ಸಮ್ಮೇಳನದಲ್ಲಿ ಮುಸಲ್ಮಾನರ ನರಮೇಧಕ್ಕೆ ಕರೆ ನೀಡಿರುವುದನ್ನೂ ಸೇರಿದಂತೆ, ಹಲವು ಧಾರ್ಮಿಕ ನಾಯಕರು, ಸ್ವಾಮೀಜಿಗಳು ಜನವಿರೋಧಿ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದಾರೆ. ಇದಕ್ಕೆ ಪ್ರತಿಯಾಗಿ ಕೆಲವು ಮುಸ್ಲಿಂ ಮತಾಂಧ ಸಂಘಟನೆಗಳೂ ಸಹ ಪ್ರತ್ಯಕ್ಷವಾಗಿ, ಪರೋಕ್ಷವಾಗಿ, ಮತೀಯ ದ್ವೇಷವನ್ನು ಹರಡುವ ಕಾರ್ಯಾಚರಣೆಯಲ್ಲಿ ತೊಡಗಿರುವುದು ಗುಟ್ಟಿನ ಮಾತೇನಲ್ಲ.

ಈ ವಾಸ್ತವವನ್ನು ಒಪ್ಪಿಕೊಂಡೇ ಭಾರತ ಇಂದು ಮತಾಂಧತೆಯ ವಿರುದ್ಧ ಹೋರಾಡಬೇಕಿದೆ. ಅಲ್ಪಸಂಖ್ಯಾತ ಸಮುದಾಯಗಳ ಜೀವನೋಪಾಯಕ್ಕೆ ಸಂಚಕಾರ ತಂದೊಡ್ಡುವ ರೀತಿಯಲ್ಲಿ ವ್ಯಾಪಾರ ನಿಷೇಧ ಹೇರುವ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಇದು ದೇವಾಲಯದ ಆವರಣದಿಂದ ಸಂತೆಮಾಳದವರೆಗೆ, ಜಾತ್ರೆಗಳವರೆಗೆ ಹರಡಿದೆ. ಇದರ ಪರಾಕಾಷ್ಠೆಯನ್ನು ಧಾರವಾಡದ ಕಲ್ಲಂಗಡಿ ಅಂಗಡಿಯ ಧ್ವಂಸದಲ್ಲಿ ಕಂಡಿದ್ದೇವೆ. ದೆಹಲಿಯ ಜೆಎನ್‌ಯು ವಿಶ್ವವಿದ್ಯಾಲಯದ ಹಾಸ್ಟೆಲ್‌ ಒಂದರಲ್ಲಿ ಮಾಂಸಾಹಾರ ಸೇವಿಸಲು ಅಡ್ಡಿಪಡಿಸಿರುವ ಕೆಲವು ಮತಾಂಧರು ಅಲ್ಲಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವುದು ವರದಿಯಾಗಿದೆ.

ಈ ದುಷ್ಕೃತ್ಯಗಳಲ್ಲಿ ತೊಡಗುವ, ಮುಸ್ಲಿಂ ವ್ಯಾಪಾರಿಗಳಲ್ಲಿ ಭೀತಿ ಉಂಟುಮಾಡುವ ಸಂಘಟನೆಗಳನ್ನು ನಿಯಂತ್ರಿಸುವುದು ಚುನಾಯಿತ ಸರ್ಕಾರದ ಆದ್ಯತೆಯಾಗಬೇಕಿದೆ. ಈ ಸಂಘಟನೆಗಳ ಧ್ಯೇಯ ಯಾವುದೇ ಧರ್ಮ ರಕ್ಷಣೆಯಲ್ಲ ಅಥವಾ ಒಂದು ಸಮುದಾಯದ ಹಿತಾಸಕ್ತಿಗಳ ರಕ್ಷಣೆಯೂ ಆಗಿರುವುದಿಲ್ಲ. ತಮ್ಮ ಸಂಘಟನಾತ್ಮಕ ಅಸ್ತಿತ್ವವನ್ನು ಉಳಿಸಿಕೊಳ್ಳಲು ಕೆಲವೇ ಬೆರಳೆಣಿಕೆಯಷ್ಟು ಮಂದಿಯ ಸಂಘಟನೆಗಳು ಸಮಾಜದಲ್ಲಿ ಪ್ರಕ್ಷುಬ್ಧತೆ ಉಂಟುಮಾಡಲು ಈ ರೀತಿಯ ದಾಳಿ ನಡೆಸಲಾಗುತ್ತದೆ.

ಆದರೆ ಈ ದಾಳಿಗಳ ಹಿಂದಿರುವ ಮನಸ್ಥಿತಿಗೆ ಕಳೆದ ಮೂರು ದಶಕಗಳಲ್ಲಿ ನೆಲೆಯೂರಿರುವ ದ್ವೇಷ ರಾಜಕಾರಣವೇ ಆಗಿದೆ ಎನ್ನುವುದನ್ನು ಅಲ್ಲಗಳೆಯಲಾಗುವುದಿಲ್ಲ. ತಳಮಟ್ಟದಲ್ಲಿ ಸದಾ ಸಮನ್ವಯ ಮತ್ತು ಸೌಹರ್ದತೆಯಿಂದ ಬದುಕು ಸವೆಸುವ ಶ್ರಮಜೀವಿ ವರ್ಗಗಳ ನಡುವೆ ಜಾತಿ ಮತಗಳ ಗೋಡೆಗಳನ್ನು ಕಟ್ಟುವ ಮೂಲಕ ಸಾಮಾಜಿಕ ವಿಘಟನೆಗೆ ಕಾರಣವಾಗುವುದೇ ಅಲ್ಲದೆ, ಜನಸಾಮಾನ್ಯರಲ್ಲಿ ಅನ್ಯಮತ ದ್ವೇಷ ಮತ್ತು ಅಸೂಯೆಯನ್ನು ಹರಡುವ ಪ್ರಕ್ರಿಯೆಗೆ ದ್ವೇಷ ರಾಜಕಾರಣ ಬುನಾದಿಯಾಗುತ್ತದೆ.

ಈ ವಿಘಟನೆಯ ಪ್ರಕ್ರಿಯೆಯನ್ನು ಮತ್ತು ವಿಧ್ವಂಸಕ ಪ್ರವೃತ್ತಿಯನ್ನು ತಡೆಗಟ್ಟುವುದು ಈ ದೇಶದ ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯವೂ ಆಗಿರುತ್ತದೆ. ಆದರೆ ಇಂತಹ ಪ್ರತಿಯೊಂದು ಘಟನೆ ಸಂಭವಿಸಿದಾಗಲೂ, ಅಲ್ಪಸಂಖ್ಯಾತರ ಮೇಲೆ ದಾಳಿ ನಡೆದಾಗಲೂ ಅದನ್ನ ಸಮರ್ಥಿಸುವ ಅಥವಾ ಪ್ರಚೋದಿಸುವ ಹೇಳಿಕೆಗಳನ್ನು ನೀಡುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ.

ರಾಜಕೀಯ ಪಕ್ಷದ ನಾಯಕರು ಮತ್ತು ವಿಶೇಷವಾಗಿ ಜನಪ್ರತಿನಿಧಿಗಳು ತಮ್ಮ ಪ್ರಾತಿನಿಧಿತ್ವವನ್ನು ಒಂದು ಸೀಮಿತ ಜಾತಿ, ಮತದ ಚೌಕಟ್ಟಿಗೆ ಒಳಪಡಿಸಿಕೊಳ್ಳುವುದು ಸಂವಿಧಾನಕ್ಕೆ ದ್ರೋಹ ಬಗೆದಂತಾಗುತ್ತದೆ. ತಮ್ಮ ಪಕ್ಷದ ಸಿದ್ಧಾಂತ, ತಾತ್ವಿಕ ನೆಲೆಗಳು ಮತ್ತು ಅಂತಿಮ ಗುರಿ ಏನೇ ಆಗಿದ್ದರೂ, ಇಂದು ದೇಶದ ಶಾಸನ ಸಭೆಗಳಲ್ಲಿ ಆಸೀನರಾಗಿರುವ ಪ್ರತಿಯೊಬ್ಬ ಜನಪ್ರತಿನಿಧಿಯೂ ಭಾರತದ ಸಂವಿಧಾನಕ್ಕೆ ಬದ್ಧರಾಗಿಯೇ ನಡೆದುಕೊಳ್ಳಬೇಕಲ್ಲವೇ ? ಹಿಂದೂ ಮತ್ತು ಇಸ್ಲಾಂ ಧರ್ಮದ ರಕ್ಷಣೆಯ ಹೆಸರಿನಲ್ಲಿ ಹುಟ್ಟಿಕೊಂಡಿರುವ ಅಸಂಖ್ಯಾತ ಸಂಘಟನೆಗಳು ಇಂದು ಶಸ್ತ್ರಾಸ್ತ್ರಗಳ ಭಂಡಾರವನ್ನೇ ತಮ್ಮ ಬಳಿ ಇಟ್ಟುಕೊಂಡಿವೆ. ಬಹಿರಂಗವಾಗಿಯೇ ಖಡ್ಗ ಝಳಪಿಸುವ, ಲಾಂಗು ಮಚ್ಚುಗಳನ್ನು ವಿತರಿಸುವ ಮತ್ತು ಪ್ರದರ್ಶಿಸುವ, ಹಂಚುವ ಹಾಗೂ ಬಳಸುವ ಮಟ್ಟಿಗೆ ಈ ಮತಾಂಧ ಸಂಘಟನೆಗಳು ಬೆಳೆದು ನಿಂತಿವೆ.

ಈ ವಿಧ್ವಂಸಕತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು ವಿಫಲವಾಗಿರುವುದೇ ಅಲ್ಲದೆ, ಅಮಾಯಕ ಸಾರ್ವಜನಿಕರ ಮೇಲೆ ನಡೆಯುವ ಮತಾಂಧರ ದಾಳಿಗಳ ಬಗ್ಗೆ ಮೌನ ವಹಿಸುವ ಮೂಲಕ ಈ ಕೃತ್ಯಗಳಿಗೆ ಪರೋಕ್ಷ ಸಮ್ಮತಿಯನ್ನೂ ನೀಡುತ್ತಿವೆ. ಕಳೆದ ಎರಡು ತಿಂಗಳಲ್ಲೇ ಕರ್ನಾಟಕದಲ್ಲಿ ಐದಾರು ಯುವಕರ ಹತ್ಯೆಗಳು ನಡೆದಿವೆ.

ಪ್ರತಿಯೊಂದು ಘಟನೆಯಲ್ಲೂ ಜಾತಿ-ಮತ-ಧರ್ಮದ ಅಸ್ಮಿತೆಗಳನ್ನು ಕೆದಕುವ ಮೂಲಕ ಪರಸ್ಪರ ದೋಷಾರೋಪಣೆಯಲ್ಲಿ ತೊಡಗಿರುವ ಜನಪ್ರತಿನಿಧಿಗಳು, ಈ ಹತ್ಯೆಗಳನ್ನು ಪ್ರಚೋದಿಸುವ ಸಾಮಾಜಿಕ-ಸಾಂಸ್ಕೃತಿಕ ಕಾರಣಗಳನ್ನು ಶೋಧಿಸಲು ಮುಂದಾಗುತ್ತಿಲ್ಲ. ಬದಲಾಗಿ ಪ್ರತಿಯೊಂದು ಹತ್ಯೆಯನ್ನೂ, ದಾಳಿಯನ್ನೂ ತಮ್ಮ ಪಕ್ಷದ ಸೈದ್ಧಾಂತಿಕ ನಿಲುಮೆಗೆ ಅನುಗುಣವಾಗಿ ಸಮರ್ಥಿಸಿಕೊಳ್ಳುವ ಅಥವಾ ವಿರೋಧಿಸುವ ಬೀಸು ಹೇಳಿಕೆಗಳ ಮೂಲಕ ಸಮಾಜದಲ್ಲಿ ಅಶಾಂತಿ ಮತ್ತು ಪ್ರಕ್ಷುಬ್ಧತೆಯನ್ನು ಹೆಚ್ಚಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಚಂದ್ರು ಕೊಲೆ ಪ್ರಕರಣದಲ್ಲಿ ಗೃಹಸಚಿವರ ಅವಸರದ ಹೇಳಿಕೆ ಇದಕ್ಕೊಂದು ನಿದರ್ಶನ. ಮುಸ್ಕಾನ್‌ ಪ್ರಕರಣದಲ್ಲಿ ಅಲ್‌ಖೈದಾ ಸಂದೇಶವನ್ನು ಆರೆಸ್ಸೆಸ್‌ ಪಿತೂರಿ ಎಂದು ನಿರಾಧಾರವಾಗಿ ಆರೋಪಿಸುವ ಕಾಂಗ್ರೆಸ್‌ ಪಕ್ಷದ ವರ್ತನೆಯೂ ಇಲ್ಲಿ ಪ್ರಶ್ನಾರ್ಹವಾಗುತ್ತದೆ. ಈ ಸಂದೇಶದ ಮೂಲವನ್ನು ತಮ್ಮ ವಿರೋಧಿ ಪಕ್ಷಗಳಲ್ಲಿ ಹುಡುಕುತ್ತಾ ದೋಷಾರೋಪಣೆಯಲ್ಲಿ ತೊಡಗುವುದರಿಂದ, ಜಾಗತಿಕ ಭಯೋತ್ಪಾದನೆಯ ರೂವಾರಿ ಸಂಘಟನೆಗಳಿಗೆ ಮತ್ತಷ್ಟು ಪುಷ್ಟಿ ನೀಡಿದಂತಾಗುತ್ತದೆ. ಈ ಸೂಕ್ಷ್ಮವನ್ನು ಸಹ ಗಮನಿಸಲಾರದಷ್ಟು ನಮ್ಮ ಜನಪ್ರತಿನಿಧಿಗಳು ವಿವೇಕ ಕಳೆದುಕೊಂಡಂತಿದೆ.

ಇಂದು ಹಿಂದೂ ಮತಾಂಧ ಸಂಘಟನೆಗಳು ನಡೆಸುತ್ತಿರುವ ದಾಳಿಗಳ ಹಿಂದೆ ಒಂದು ರಾಜಕೀಯ ಚಿಂತನಾ ವಾಹಿನಿ ಇದೆ. ಇದಕ್ಕೆ ಪ್ರತಿಯಾಗಿ ಮುಸ್ಲಿಂ ಸಂಘಟನೆಗಳು ತಾಳ್ಮೆಯಿಂದಲೇ ಇದ್ದರೂ, ಇಂತಹ ಸನ್ನಿವೇಶದಲ್ಲಿ ಸಮುದಾಯದೊಳಗಿನ ಒಳಗುದಿ, ಅಂತರಿಕ ಕ್ಷೋಭೆ ಯಾವುದೇ ಕ್ಷಣದಲ್ಲಾದರೂ ಸ್ಫೋಟಿಸುವ ಸಾಧ್ಯತೆಗಳಿರುತ್ತವೆ. ರಾಮಮಂದಿರ ವಿವಾದದ ಸಂದರ್ಭದಲ್ಲಿ ಭಾರತ ಇಂತಹ ಸನ್ನಿವೇಶಗಳಿಗೆ ಸಾಕ್ಷಿಯಾಗಿ, ಸಾವಿರಾರು ಜೀವಗಳ ಬಲಿಯಾಗಿದೆ.

ಎರಡೂ ಕಡೆಯ ಮತಾಂಧ ಸಂಘಟನೆಗಳ ಬಳಿ ಅಂತರಿಕ ಕಲಹ ಸೃಷ್ಟಿಮಾಡುವಷ್ಟು ಪ್ರಮಾಣದ ಶಸ್ತ್ರಾಸ್ತ್ರಗಳ ಸಂಗ್ರಹವಾಗಿರುವುದು ಸರ್ಕಾರಕ್ಕೂ ತಿಳಿದಿದೆ. ಆದರೆ ಈ ದಿಕ್ಕಿನಲ್ಲಿ ಪ್ರಸ್ತುತ ಸರ್ಕಾರವನ್ನೂ ಸೇರಿದಂತೆ ಯಾವುದೇ ಸರ್ಕಾರವೂ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳದಿರುವುದು ನಾಗರಿಕ ಸಮಾಜವನ್ನು ಸದಾ ಪ್ರಕ್ಷುಬ್ಧತೆಯಲ್ಲಿರುವಂತೆ ಮಾಡಿದೆ.

ಹಿಜಾಬ್‌ ಆಗಲೀ, ಹಲಾಲ್‌ ಆಗಲೀ ಅಥವಾ ದೇವಾಲಯಗಳ ಬಳಿ ವ್ಯಾಪಾರ ನಡೆಸುವುದಾಗಲೀ, ಸಾಂವಿಧಾನಿಕ ನೆಲೆಯಲ್ಲಿ ನಿರ್ಧಾರವಾಗಬೇಕಾದ ಈ ವಿವಾದಗಳಲ್ಲಿ ಇಂದು ಹಿಂದೂ ಮತ್ತು ಮುಸ್ಲಿಂ ಮತಾಂಧ ಸಂಘಟನೆಗಳು ನಿರ್ಣಾಯಕವಾಗುತ್ತಿವೆಯೇ ಹೊರತು ಜಾತ್ಯತೀತ ನೆಲೆಯ ವಿವೇಕಯುತ ನಾಗರಿಕ ಸಮಾಜ ಕಂಡುಬರುತ್ತಿಲ್ಲ. ಪರಿಣಾಮ ನಬೀಸಾಬ್‌ನಂತಹ ಅಮಾಯಕ ವ್ಯಾಪಾರಿಗಳು, ಹರ್ಷನಂತಹ ಯುವಕರು ಬಲಿಯಾಗುತ್ತಾರೆ.

ನಾಗರಿಕ ಸಮಾಜದ ಉದಾರವಾದಿ ನೆಲೆಯ, ಜಾತ್ಯತೀತ ಧೋರಣೆಯ ಸಾರ್ವಜನಿಕ ಪ್ರತಿನಿಧಿಗಳಿಗೆ ಇಂತಹ ಒಂದು ಅವಕಾಶವನ್ನು ಕಲ್ಪಿಸುವ ಜವಾಬ್ದಾರಿ ಜನಪ್ರತಿನಿಧಿಗಳ ಮೇಲಿರುತ್ತದೆ. ಪಕ್ಷ ರಾಜಕಾರಣ ಕೇವಲ ಅಧಿಕಾರ ಪೀಠವನ್ನು ಅಲಂಕರಿಸುವ ಒಂದು ಸಾಧನ ಮಾತ್ರ. ಇದನ್ನು ಮೀರಿದ ಒಂದು ಸಾಂವಿಧಾನಿಕ ನೈತಿಕತೆ ಎಲ್ಲ ಪಕ್ಷದ ನಾಯಕರಲ್ಲೂ ಇರಬೇಕಾಗುತ್ತದೆ.

ಸಂವಿಧಾನ ಪ್ರತಿಪಾದಿಸುವ ಸಮಾನತೆ, ಸಹಿಷ್ಣುತೆ, ಭ್ರಾತೃತ್ವ ಮತ್ತು ಜಾತ್ಯತೀತೆಯನ್ನು ಕಾಪಾಡುವ ಹೊಣೆ ಪ್ರತಿಯೊಬ್ಬ ಜನಪ್ರತಿನಿಧಿಯ ಮೇಲೆ, ಪಕ್ಷಾತೀತವಾಗಿ, ಇರುತ್ತದೆ. ದುರಂತ ಎಂದರೆ ಪಕ್ಷ ರಾಜಕಾರಣದ ಅಧಿಕಾರ ಮೋಹಕ್ಕೆ ಬಲಿಯಾಗಿರುವ ಭಾರತದ ರಾಜಕಾರಣಿಗಳು ತಮ್ಮ ಈ ನೈತಿಕ ಹೊಣೆಯನ್ನೇ ಮರೆತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರ ಶಾಶ್ವತವಲ್ಲ, ಈ ಅಧಿಕಾರವನ್ನು ಅನುಭವಿಸಲು ಅವಕಾಶ ನೀಡುವ ಪ್ರಜಾಸತ್ತಾತ್ಮಕ ಸಂವಿಧಾನ ಮತ್ತು ಈ ಸಂವಿಧಾನ ಪ್ರತಿಪಾದಿಸುವ ಮೌಲ್ಯಗಳು ಶಾಶ್ವತವಾದದ್ದು. ಈ ಪರಿಜ್ಞಾನ ಎಲ್ಲ ರಾಜಕೀಯ ನಾಯಕರಲ್ಲೂ ಇರಬೇಕಾಗುತ್ತದೆ.

ಇದು ಇಲ್ಲವಾಗಿರುವುದರಿಂದಲೇ ಭಾರತ ಇಂದು ದ್ವೇಷ, ಅಸೂಯೆ, ಮತ್ಸರ, ಮತಾಂಧತೆ, ಜಾತೀಯತೆ ಮತ್ತು ಹಿಂಸೆಯಿಂದ ಕೂಡಿದ ಒಂದು ಅಗ್ನಿಕುಂಡದಲ್ಲಿ ಬೇಯುವಂತಾಗಿದೆ. ಇದಕ್ಕೆ ಯಾರು ಹೊಣೆ ? ನಬೀ ಸಾಬ್‌ ಅಲ್ಲ, ಮುಸ್ಕಾನ್‌ ಅಲ್ಲ, ಹರ್ಷನೂ ಅಲ್ಲ, ಚಂದ್ರು ಸಹ ಅಲ್ಲ. ಇವರೆಲ್ಲರೂ ಸ್ಥಾಪಿತ ವ್ಯವಸ್ಥೆಯೊಳಗಿನ ವಿಕೃತಿಗಳಿಗೆ ಬಲಿಯಾದ ಅಮಾಯಕರೇ ಆಗಿದ್ದಾರೆ.

ಈ ಸ್ಥಾಪಿತ ವ್ಯವಸ್ಥೆಯಲ್ಲಿ ನಡೆಯುತ್ತಿರುವ ರಾಜಕೀಯ ಅಪರಾಧೀಕರಣ, ಸಾಂಸ್ಕೃತಿಕ ಪಾತಕೀಕರಣ ಮತ್ತು ಮತ ಧಾರ್ಮಿಕ ಹಿಂಸಾಚರಣೆಗೆ ಈ ದೇಶದ ರಾಜಕೀಯ ವ್ಯವಸ್ಥೆಯೇ ಕಾರಣ ಎನ್ನುವುದು ಸುಸ್ಪಷ್ಟ. ಇದರ ನೇರ ಹೊಣೆಯನ್ನು ಅಧಿಕಾರ ರಾಜಕಾರಣದ ವಾರಸುದಾರರು, ಪಕ್ಷಾತೀತವಾಗಿ ಹೊರಬೇಕಾಗುತ್ತದೆ.

ತಮ್ಮ ಸಾಂವಿಧಾನಿಕ ನೈತಿಕತೆ ಮತ್ತು ಹೊಣೆಗಾರಿಕೆಯನ್ನು ಅರಿತು, ಪ್ರಜಾತಂತ್ರವನ್ನು ಉಳಿಸುವ ಜವಾಬ್ದಾರಿಯೊಂದಿಗೇ, ಸಾರ್ವಜನಿಕ ಬದುಕಿನಲ್ಲಿ ಶಾಂತಿಯುತ ವಾತಾವರಣವನ್ನು ಸೃಷ್ಟಿಸುವ ನಿಟ್ಟಿನಲ್ಲಿ ಎಲ್ಲ ರಾಜಕೀಯ ಪಕ್ಷಗಳೂ, ನಾಯಕರೂ ಯೋಚಿಸಿದರೆ ಬಹುಶಃ ಭಾರತ, ಕನಿಷ್ಠ ಪಕ್ಷ ಕರ್ನಾಟಕ “ ಸರ್ವ ಜನಾಂಗದ ಶಾಂತಿಯ ತೋಟ ” ಆಗಲು ಸಾಧ್ಯವಾದೀತು. “ ಸಂವಿಧಾನವನ್ನು ಹೊತ್ತು ತಿರುಗುವ ಚುನಾಯಿತ ಜನಪ್ರತಿನಿಧಿಗಳು ಈ ತೋಟದ ಮಾಲಿಗಳಾದರೆ ಶಾಂತಿ ನೆಲೆಸುತ್ತದೆ ಇಲ್ಲವಾದರೆ ಇರುವ ಹಸಿರೆಲೆಗಳೂ ಮುರುಟಿಹೋಗುತ್ತವೆ.”

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending