ದಿನದ ಸುದ್ದಿ
ಮಧ್ಯಾಹ್ನದ ಪ್ರಮುಖ ಸುದ್ದಿಗಳು
ಮಧ್ಯಾಹ್ನದ ಪ್ರಮುಖ ಸುದ್ದಿಗಳು
- ತೆಲಂಗಾಣ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ಮೃತರ ಸಂಬಂಧಿಕರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
- ದೇಶದಲ್ಲಿ ಕಳೆದ ೨೪ ಗಂಟೆಗಳ ಅವಧಿಯಲ್ಲಿ 3 ಸಾವಿರದ 207ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಇದೇ ಅವದಿಯಲ್ಲಿ 3 ಸಾವಿರದ 410 ಸೋಂಕಿತರು ಚೇತರಿಸಿಕೊಂಡಿದ್ದು, 29ಮಂದಿ ಮೃತಪಟ್ಟಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 20ಸಾವಿರದ 403ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
- ಇಸ್ತಾನ್‌ಬುಲ್‌ನಲ್ಲಿ ಇಂದು ಆರಂಭವಾಗಲಿರುವ ಐಬಿಎ ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಷಿಪ್‌ನಲ್ಲಿ ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್ ಭಾರತದ ಪರ ಅಭಿಯಾನ ಆರಂಭಿಸಲಿದ್ದಾರೆ. ಭಾರತೀಯ ಬಾಕ್ಸರ್ ಲವ್ಲಿನಾ ಚಾಂಪಿಯನ್ ಷಿಪ್‌ನಲ್ಲಿ ಮಿಶ್ರ ಡ್ರಾ ಪಡೆದಿದ್ದಾರೆ.
- ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ನ್ಯಾಯಮೂರ್ತಿ ಜಮ್‌ಶೆಡ್ ಬುರ‍್ಜೋರ್ ಪರ್ದಿವಾಲ ಇಂದು ಸುಪ್ರೀಂಕೋರ್ಟ್‌ನ ನ್ಯಾಯಧೀಶರಾಗಿ ಪ್ರಮಾಣವಚನ ಸ್ವೀಕರಿಸಿದರು. ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನೂತನ ನ್ಯಾಯಧೀಶರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
- ಉತ್ತರಕನ್ನಡ ಜಿಲ್ಲೆಯ ಕಾರವಾರ-ಅಂಕೋಲಾ ತಾಲೂಕಿನ ವಿವಿಧ ದೇವಾಲಯಗಳ ಜೀರ್ಣೋದ್ಧಾರಕ್ಕೆ ರಾಜ್ಯ ಸರ್ಕಾರ 2 ಕೋಟಿ ರೂಪಾಯಿ ಅನುದಾನ ಮಂಜೂರಿ ಮಾಡಿದೆ ಎಂದು ಶಾಸಕಿ ರೂಪಾಲಿ ನಾಯ್ಕ ತಿಳಿಸಿದ್ದಾರೆ.
- ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾ ಅಕಾಡೆಮಿಯಲ್ಲಿ ಇಂದು ರಾತ್ರಿ 7.30ಕ್ಕೆ ಆರಂಭವಾಗಲಿರುವ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕೊತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಜಿಲ್ಲಾಡಳಿತಕ್ಕೆ ವೇಗ ನೀಡುವುದು ಸೇರಿದಂತೆ ಹಲವು ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
- ಇಂದು ಹೋರಾಟಗಾರ ಮಹಾರಾಣಾ ಪ್ರತಾಪ್ ಅವರ ಜಯಂತಿ. ಇದರ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಪ್ರತಿಮ ವೀರ, ಅದ್ವಿತೀಯ ಶೌರ್ಯ, ಪರಾಕ್ರಮಗಳ ಮೂಲಕ ಸ್ವದೇಶ, ಸಂಸ್ಕೃತಿ, ಸ್ವಾಭಿಮಾನವನ್ನು ರಕ್ಷಿಸಿದವರ ಪೈಕಿ ಮಹಾರಾಣಾ ಪ್ರತಾಪ್ ಅಪ್ರತಿಮ ಹೋರಾಟಗಾರರಲ್ಲಿ ಒಬ್ಬರಾಗಿದ್ದ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
- ಪಾಕಿಸ್ತಾನ ಮೂಲದ ಗ್ಯಾಂಗ್‌ಸ್ಟರ್ ದಾವೂದ್ ಇಬ್ರಾಹಿಮ್‌ನ ಸಹಚರರು ಮತ್ತು ಕೆಲವು ಹಾವಾಲ ನಿರ್ವಹಕರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಎಎನ್‌ಐ ಮುಂಬೈನಲ್ಲಿಂದು 12 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿದೆ.
- ಜರ್ಮನಿಯ ಸುಹ್ಲ್ ನಲ್ಲಿ ಇಂದು ಅಂತಾರಾಷ್ಟ್ರೀಯ ಶೂಟಿಂಗ್ ಸ್ಪೋರ್ಟ್ ಫೆಡರೇಷನ್ – ಐಎಸ್ ಎಸ್ ಎಫ್ ಜೂನಿಯರ್ ವಿಶ್ವ ಕಪ್ ಟೂರ್ನಿ ಆರಂಭವಾಗಲಿದೆ. ಸ್ಟಾರ್ ಶೂಟರ್ ಗಳಾದ ಮನು ಭಾಕರ್ ಮತ್ತು ಸೌರಭ್ ಚೌಧರಿ ಟೂರ್ನಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243