Connect with us

ದಿನದ ಸುದ್ದಿ

ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ ಬಿಡುಗಡೆ ಮಾಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಬುಧವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿವಮೊಗ್ಗ ಹಾಲು ಒಕ್ಕೂಟದಿಂದ ಬೇರ್ಪಡಿಸಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಒಳಗೊಂಡ ಮೆಗಾ ಡೈರಿ ಆರಂಭಿಸಲು ನನ್ನ ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿಯಲ್ಲಿ ಭೂಮಿ ಖರೀದಿಸಿದ್ದೇವೆ. ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಿ ಡೈರಿ ಆರಂಭಿಸಿದರೆ ಈ ಭಾಗದ ರೈತರು ಆರ್ಥಿಕವಾಗಿ ಸಬಲರಾಗಲಿದ್ದಾರೆ ಎಂದು ಸದನದ ಗಮನ ಸೆಳೆದರು.

ಹೈನುಗಾರಿಕೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಸಬ್ಸಿಡಿ ಕೊಡುವುದನ್ನು ಶೇ.75ರಷ್ಟು ಹೆಚ್ಚಳ ಮಾಡಿದರೆ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಿ ಉತ್ತಮ ಬದುಕು ಕಟ್ಟಿಕೊಳ್ಳುತ್ತಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದರು.

ಮಧ್ಯ ಕರ್ನಾಟಕದ ಕೇಂದ್ರ ಬಿಂದು, ಹಿಂದುಳಿದ ಜಿಲ್ಲೆ ದಾವಣಗೆರೆ. ಅದರಲ್ಲೂ ಅತೀ ಹಿಂದುಳಿದ ಮೀಸಲು ಕ್ಷೇತ್ರ ಮಾಯಕೊಂಡ. ಸಿರಿಗೆರೆ ತರಳಬಾಳು ಜಗದ್ಗುರುಗಳ ಹೋರಾಟದ ಫಲವಾಗಿ ನನ್ನ ಕ್ಷೇತ್ರದಲ್ಲಿ 22 ಕೆರೆಗಳ ಯೋಜನೆ ಜಾರಿಗೊಂಡು ಎಲ್ ಅಂಡ್ ಟಿ ಕಂಪನಿ ಕಾಮಗಾರಿ ನಡೆಸಿತ್ತು. ಕಳಪೆ ಕಾಮಗಾರಿಯಿಂದ 100 ಹಳ್ಳಿಗಳಿಗೆ ಕುಡಿಯುವ ನೀರು, ನೀರಾವರಿ ಕಲ್ಪಿಸಬೇಕೆಂಬ ಉದ್ದೇಶ ಈಡೇರಿಲ್ಲ. ಪುನಃ ಹೊಸ ಪೈಪ್‌ಲೈನ್ ಕಾಮಗಾರಿಗೆ ಹಣ ನೀಡಿ ಕಾಮಗಾರಿ ಆರಂಭಿಸುವAತೆ ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಕೂಡಲೇ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ನನ್ನ ಕ್ಷೇತ್ರದಲ್ಲಿ ಹೆಚ್ಚು ಗುಡ್ಡಗಾಡು ಪ್ರದೇಶ ಹೊಂದಿದ್ದು, ಈ ಪ್ರದೇಶಗಳಲ್ಲಿ ಅತೀ ಹೆಚ್ಚು ಕೆರೆಗಳನ್ನು ನಿರ್ಮಾಣ ಮಾಡಿದರೆ ಜನಜಾನುವಾರುಗಳಿಗೆ ಕುಡಿಯುವ ನೀರು, ಅಂತರ್ಜಲ ಮಟ್ಟ ವೃದ್ಧಿಗೆ ಅನುಕೂಲವಾಗುತ್ತದೆ. ಅಲ್ಲದೇ ಬ್ರಿಟಿಷರು ನಿರ್ಮಿಸಿದ ಕೆರೆ ಇದೆ. ಅದನ್ನು ಜೀರ್ಣೋದ್ಧಾರ ಮಾಡಿದರೆ ಇಡೀ ಪಕ್ಷಿ ಸಂಕುಲ, ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಬಹುದು ಎಂದು ಸದನ ಗಮನ ಸೆಳೆದರು.

ಎಸ್ಸಿ-ಎಸ್ಟಿ ಅಭಿವೃದ್ಧಿ ನಿಗಮಗಳಿಗೆ ಅನೇಕ ಸೌಲಭ್ಯ ಒದಗಿಸಲು ಅನುದಾನದ ಕೊರತೆ ಇದೆ. ಹೆಚ್ಚಿನ ಅನುದಾನ ನೀಡಬೇಕು. ಎಸ್ಸಿ-ಎಸ್ಟಿ ಸಮುದಾಯ ಆರ್ಥಿಕವಾಗಿ ಸಬಲರಾಗಲು ಭೂಒಡೆತನ ಯೋಜನೆ ಜಾರಿಗೊಳಿಸಿದ್ದು, ಕ್ಷೇತ್ರಕ್ಕೆ ಕೇವಲ ಒಂದೇ ಕೊಟ್ಟರೆ ಸಾಧ್ಯವಾಗುವುದಿಲ್ಲ. ಇದಕ್ಕೆ ಹೆಚ್ಚು ಒತ್ತು ಕೊಡಬೇಕು. ಖಾಸಗಿ ಕಾಲೇಜುಗಳಲ್ಲಿ ಡಿಪ್ಲೊಮಾ, ನರ್ಸಿಂಗ್, ಪ್ಯಾರಾ ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸ್ನಲ್ಲಿ ಅಭ್ಯಾಸ ಮಾಡುವ ಎಸ್ಸಿ-ಎಸ್ಟಿ ಮಕ್ಕಳಿಗೆ 2013-18ರಲ್ಲಿ ಹಾಸ್ಟೆಲ್ ಸೌಲಭ್ಯ ಇತ್ತು, ಈಗ ಇಲ್ಲ. ಕೂಡಲೇ ಈ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿದರು.

ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಹಗಲು ದರೋಡೆ ಮಾಡಲಾಗುತ್ತಿದೆ. ಹೊರ ಗುತ್ತಿಗೆ ತೆಗೆದು ನೇರವಾಗಿ ನೇಮಕಾತಿ ಮಾಡಿಕೊಂಡರೆ ಅವರ ಬದುಕು ಉಜ್ವಲವಾಗುತ್ತದೆ. ಶೋಷಿತ ಸಮುದಾಯಗಳಿಗೆ ತ್ವರಿತ ನ್ಯಾಯ ಒದಗಿಸಲು ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯಡಿ ರಾಜ್ಯದಲ್ಲಿ 33 ವಿಶೇಷ ಪೊಲೀಸ್ ಠಾಣೆ ತೆರೆಯಲು ಕ್ರಮ, ಅಲ್ಲದೇ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ 2 ಕೋಟಿ ಮೀಸಲು, ಅದರಂತೆ ಒಬಿಸಿ, ಅಲ್ಪಸಂಖ್ಯಾತರಿಗೂ 2 ಕೋಟಿ ಮೀಸಲಿಡುವ ಮೂಲಕ ರೈತರು, ಕಾಯಕ ಜೀವಿಗಳು, ವಿಶೇಷವಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಎಸ್‌ಸಿಪಿ-ಎಸ್‌ಟಿಪಿ ಯೋಜನೆಯಡಿ 48,018 ಕೋಟಿ ರೂ. ಬಜೆಟ್‌ನಲ್ಲಿ ಮೀಸಲಿಟ್ಟಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.


  • ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ
    ಮಳೆಗಾಲದಲ್ಲಿ ತುಂಗಾ ಜಲಾಯಶದಿಂದ ಭದ್ರಾ ಜಲಾಶಯಕ್ಕೆ ನೀರು ತುಂಬಿಸಿ ಅಪರ್ ಭದ್ರಾ ಯೋಜನೆ ನೀರು ನೀಡುವ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದರೆ ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರಿಗೆ ಅನುಕೂಲವಾಗಲಿದೆ. ಇಲ್ಲದಿದ್ದರೆ, ನಮ್ಮ ಭಾಗದ ರೈತರಿಗೆ ಅನಾನುಕೂಲವಾಗಲಿದೆ. ಕೂಡಲೇ ಸರ್ಕಾರ ಈ ಯೋಜನೆಯ ಕಾಮಗಾರಿ ಪೂರ್ಣಗೊಳಿಸಬೇಕು. ರಾಗಿ, ಭತ್ತ, ತೊಗರಿ ಬೆಂಬಲ ಬೆಲೆಯಡಿ ಖರೀದಿಸಿದಂತೆ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಡಿ ಖರೀದಿಸಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending