Connect with us

ದಿನದ ಸುದ್ದಿ

ಬೆಳಗಿನ ಸಂಕ್ಷಿಪ್ತ ಸುದ್ದಿಗಳು

Published

on

ಬೆಳಗಿನ ಸಂಕ್ಷಿಪ್ತ ಸುದ್ದಿಗಳು

  1. ಹಾವೇರಿಯಲ್ಲಿ ಬರುವ ಸೆಪ್ಟೆಂಬರ್ 23ರಿಂದ 3ದಿನಗಳ ಕಾಲ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಿನ್ನೆ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಬಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
  2. ಪ್ರಜಾಪ್ರಭುತ್ವದ ಯಶಸ್ಸಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಇದರಿಂದ ವಿವಿಧ ಸಾಮಾಜಿಕ ವ್ಯವಸ್ಥೆಯ ನಡುವೆಯೂ ದೇಶದ ಭವಿಷ್ಯ ಬದ್ಧವಾಗಿರಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದಾರೆ.
  3. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿ ಕರ್ನಾಟಕ ಇಡೀ ರಾಷ್ಟ್ರದಲ್ಲಿ ಮುಂಚೂಣಿಯಲ್ಲಿದ್ದು, ಈ ಮೂಲಕ ಶೈಕ್ಷಣಿಕ ಗುಣಮಟ್ಟದಲ್ಲ ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ಸಹಕಾರಿಯಾಗಲಿದೆ. ಯುವಜನರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಪೂರಕವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹರಿಹರದಲ್ಲಿ ಹೇಳಿದ್ದಾರೆ.
  4. ಬೆಂಗಳೂರು ಅಸೋಸಿಯೇಷನ್ ಫಾರ್ ಸೈನ್ಸ್ ಎಜುಕೇಷನ್ ಹಾಗೂ ಜವಹರಲಾಲ್ ನೆಹರು ತಾರಾಲಯ ಜಂಟಿಯಾಗಿ ಶೂನ್ಯ ನೆರಳಿನ ದಿನದ ಅಂಗವಾಗಿ ವಿಜ್ಞಾನ ಚಟುವಟಿಕೆಗಳ ಕಾರ್ಯಕ್ರಮವನ್ನು ಜವಹರಲಾಲ್ ನೆಹರು ತಾರಾಲಯದಲ್ಲಿ ಇಂದು ಮಧ್ಯಾಹ್ನ ಹಮ್ಮಿಕೊಳ್ಳಲಾಗಿದೆ.
  5. ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ವತಿಯಿಂದ ಏರ್ಪಡಿಸಿರುವ ರಾಜ್ಯಮಟ್ಟದ ನ್ಯಾಯಾಂಗ ಅಧಿಕಾರಿಗಳ 20ನೇ ದ್ವೈವಾರ್ಷಿಕ ಸಮ್ಮೇಳನದ ಸಮಾರೋಪ ಸಮಾರಂಭ ಇಂದು ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ನಡೆಯಲಿದೆ. ಸುಪ್ರೀಂಕೋರ್ಟ್‌ನ ನ್ಯಾಯಾಧೀಶರಾದ ಎಸ್. ಅಬ್ದುಲ್ ನಜೀರ್, ದಿನೇಶ್ ಮಾಹೇಶ್ವರಿ, ಅಭಯ್ ಎಸ್ ಓಕಾ, ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
  6. ನವದೆಹಲಿಯ ಸಫ್ದರ್‌ಜಂಗ್ ವಿಮಾನ ನಿಲ್ದಾಣದಲ್ಲಿ ನಾಳೆ ನಾಗರಿಕ ವಿಮಾನಯಾನ ಸಚಿವಾಲಯದಿಂದ ಬೃಹತ್ ಯೋಗ ಕಾರ್ಯಕ್ರಮ ಯೋಗ ಪ್ರಭಾ ವನ್ನು ಆಯೋಜಿಸಲಾಗಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಚಿವಾಲಯದ 500ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಅದರ ಸಂಬಂಧಿತ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
  7. ದೇಶದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ ಸ್ಪಷ್ಟಪಡಿಸಿದ್ದಾರೆ.
  8. ಮುಂಬೈನ ಬ್ರೇಬೌರ್ನ್ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ ಪಂದ್ಯದಲ್ಲಿ ಸನ್‌ರೈಸರ‍್ಸ್ ಹೈದರಾಬಾದ್ ತಂಡ 9 ವಿಕೆಟ್‌ಗಳಿಂದ ರಾಯಲ್ ಚಾಲೆಂಜರ‍್ಸ್ ಬೆಂಗಳೂರು ತಂಡದ ವಿರುದ್ಧ ನಿರಯಾಸ ಗೆಲುವು ದಾಖಲಿಸಿತು. ನವಿ ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮೊತ್ತೊಂದು ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ 8ರನ್‌ಗಳಿಂದ ಕೊಲ್ಕತ್ತಾ ನೈಟ್ ರೈಡರ‍್ಸ್ ತಂಡದ ವಿರುದ್ಧ ಜಯಗಳಿಸಿತು.
  9. ರಾಜ್ಯಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಇಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಎಚ್.ಎ.ಎಲ್. ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿ ಅವರನ್ನು ಬರಮಾಡಿಕೊಂಡರು. ರಾಜ್ಯ ಕ್ರೀಡಾ ಸಚಿವ ಡಾ. ನಾರಾಯಣಗೌಡ ಮತ್ತಿತರರು ಉಪಸ್ಥಿತರಿದ್ದರು.
  10. ಕೇಂದ್ರ ವಾರ್ತಾ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ನಾಳೆ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದ್ದು, ನಂತರ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿರುವ ಜೈನ್ ಗ್ಲೋಬಲ್ ಕ್ಯಾಂಪಸ್‌ನಲ್ಲಿ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಸಂಜೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
  11. ಏಕ ಭಾರತ; ಶ್ರೇಷ್ಠ ಭಾರತ ನಿರ್ಮಿಸಲು ಯುವ ಜನತೆ ಮುಂದಾಗಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ೪೦ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ರಾಜ್ಯಪಾಲರು, ಭಾರತಕ್ಕೆ ವಿಶ್ವಗುರುವಿನ ಗೌರವವನ್ನು ಮತ್ತೆ ದೊರಕಿಸಿಕೊಡುವ ನಿಟ್ಟಿನಲ್ಲಿ ನಾವೆಲ್ಲರೂ ದೃಢ ಹೆಜ್ಜೆ ಇಡಬೇಕು ಎಂದರು.
  12. ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದೇ ತಿಂಗಳ 25ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಬೆಳೆ ಖರೀದಿಸಲು ನೋಂದಣಿ ಪ್ರಕ್ರಿಯೆ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸೂಚಿಸಿದ್ದಾರೆ. ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್ ನಂತೆ ಗರಿಷ್ಟ 20 ಕ್ವಿಂಟಾಲ್ ರಾಗಿ ಖರೀದಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
  13. ಕೇಂದ್ರ ಸರಕಾರದ ಮಹಾತ್ಮಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣೆ-ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ವಿಜಯಪುರದಲ್ಲಿ ಆಯೋಜಿಸಿರುವ ಎರಡು ದಿನಗಳ ಕಾಲ ರಾಜ್ಯಮಟ್ಟದ ನಿಂಬೆ ಉತ್ಸವ-2022ಕ್ಕೆ ಶಾಸಕ ರಮೇಶ ಭೂಸನೂರ ಇಂದು ಚಾಲನೆ ನೀಡಿದರು. ಜಿಲ್ಲೆಯ ನಿಂಬೆ ಬೆಳೆಗೆ ಜಾಗತಿಕ ಮಾರುಕಟ್ಟೆಯಲ್ಲಿ ಸೂಕ್ತ ಸ್ಥಾನಮಾನ ಲಭಿಸಿರುವುದು ಸಂತಸದ ಸಂಗತಿಯಾಗಿದೆ ಎಂದು ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending